ಶನಿವಾರ, ಸೆಪ್ಟೆಂಬರ್ 13, 2025

ಸೆ.೧೫ರಂದು ಮಾವಿನಕರೆ ಗ್ರಾಮದಲ್ಲಿ ಉಚಿತ ಆರೋಗ್ಯ ತಪಾಸಣೆ ಶಿಬಿರ

    ಭದ್ರಾವತಿ: ಕೇಂದ್ರ ಉಕ್ಕು ಪ್ರಾಧಿಕಾರದ ನಗರದ ವಿಶ್ವೇಶ್ವರಾಯ ಕಬ್ಬಿಣ ಮತ್ತು ಉಕ್ಕಿನ ಕಾರ್ಖಾನೆ ತನ್ನ ಸಾಮಾಜಿಕ ಹೊಣೆಗಾರಿಕೆಯಡಿ(ಸಿಎಸ್‌ಆರ್) ತಾಲೂಕಿನ ಮಾವಿನಕೆರೆ ಗ್ರಾಮದಲ್ಲಿ ಸೆ.೧೫ರ ಸೋಮವಾರ ಬೆಳಿಗ್ಗೆ ೯ ಗಂಟೆಯಿಂದ ಮಧ್ಯಾಹ್ನ ೨ ಗಂಟೆವರೆಗೆ ಉಚಿತ ಆರೋಗ್ಯ ತಪಾಸಣೆ ಶಿಬಿರ ಆಯೋಜಿಸಿದೆ. 
    ಗ್ರಾಮ ಪಂಚಾಯಿತಿ ಸಮೀಪದ ಸಮುದಾಯ ಭವನದಲ್ಲಿ ಆಯೋಜಿಸಲಾಗಿರುವ ಶಿಬಿರದಲ್ಲಿ ಸಾಮಾನ್ಯ ಆರೋಗ್ಯ ತಪಾಸಣೆ, ಹೃದಯ, ನೇತ್ರ, ಮೂಳೆ ಮತ್ತು ದಂತ ತಪಾಸಣೆ, ರಕ್ತದೊತ್ತಡ(ಬಿ.ಪಿ), ಸಕ್ಕರೆ(ಮಧುಮೇಹ), ನರರೋಗ ಮತ್ತು ಸ್ತ್ರೀರೋಗ ತಜ್ಞರಿಂದ ತಪಾಸಣೆ ನಡೆಯಲಿದೆ. ಉಚಿತ ಔಷಧ ವಿತರಣೆ ನಡೆಯಲಿದ್ದು, ಅಲ್ಲದೆ ಇದೆ ಸಂದರ್ಭದಲ್ಲಿ ಗ್ರಾಮಸ್ಥರಿಗೆ ಪಪ್ಪಾಯಿ ಮತ್ತು ನುಗ್ಗೆ ಬೀಜಗಳ ಉಚಿತ ವಿತರಣೆ ಸಹ ನಡೆಯಲಿದೆ. ಗ್ರಾಮಸ್ಥರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಶಿಬಿರ ಸದುಪಯೋಗಪಡೆದುಕೊಳ್ಳುವಂತೆ ಕಾರ್ಖಾನೆಯ ಸಾರ್ವಜನಿಕ ಸಂಪರ್ಕ ಇಲಾಖೆ ಮಹಾಪ್ರಬಂಧಕ ಎಲ್. ಪ್ರವೀಣ್‌ಕುಮಾರ್ ಕೋರಿದ್ದಾರೆ. 

ಸೆ.೧೫ರಂದು ಕರಾವೇ ನೂತನ ಅಧ್ಯಕ್ಷರ ಆಯ್ಕೆ, ಪದಾಧಿಕಾರಿಗಳ ಸೇರ್ಪಡೆ ಕಾರ್ಯಕ್ರಮ


    ಭದ್ರಾವತಿ: ಟಿ.ಎ ನಾರಾಯಣಗೌಡ ನೇತೃತ್ವದ ಕರ್ನಾಟಕ ರಕ್ಷಣಾ ವೇದಿಕೆ ತಾಲೂಕಿನ ನೂತನ ಮಹಿಳಾ ಅಧ್ಯಕ್ಷರ ಆಯ್ಕೆ ಮತ್ತು ಪದಾಧಿಕಾರಿಗಳ ಸೇರ್ಪಡೆ ಕಾರ್ಯಕ್ರಮ ಸೆ.೧೫ರ ಸೋಮವಾರ ಸಂಜೆ ೪ ಗಂಟೆಗೆ ನಗರದ ಬಿ.ಎಚ್ ರಸ್ತೆ, ಕೆಎಸ್‌ಆರ್‌ಟಿಸಿ ಮುಖ್ಯ ಬಸ್ ನಿಲ್ದಾಣ ಮುಂಭಾಗದ ನಂದಿನಿ ಹೋಟೆಲ್ ಸಭಾಂಗಣದಲ್ಲಿ ನಡೆಯಲಿದೆ. 
    ವೇದಿಕೆ ಪ್ರಮುಖರಾದ ಮಂಜು(ಕೇಬಲ್ ಮಂಜು), ಎಸ್. ವೆಂಕಟೇಶ್ ಮತ್ತು ರೂಪ ನಾಗರಾಜ್ ಸೇರಿದಂತೆ ಇನ್ನಿತರರು ಉಪಸ್ಥಿತರಿರುವರು ಕಾರ್ಯಕ್ರಮ ಯಶಸ್ವಿಗೊಳಿಸುವಂತೆ ವೇದಿಕೆ ಜಿಲ್ಲಾಧ್ಯಕ್ಷೆ ಜ್ಯೋತಿ ಸೋಮಶೇಖರ್ ಕೋರಿದ್ದಾರೆ. 

ಸೆ.೧೫ರಂದು ಅಂಬೇಡ್ಕರ್ ಭವನ, ತಾಲೂಕು ಕಛೇರಿ ಮುಂಭಾಗ ಹೋರಾಟ


    ಭದ್ರಾವತಿ: ನಗರದ ಹೃದಯ ಭಾಗದಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ ಸಮೀಪ ನೂತನವಾಗಿ ನಿರ್ಮಾಣಗೊಂಡಿರುವ ಭಾರತರತ್ನ, ಸಂವಿಧಾನ ಶಿಲ್ಪಿ ಡಾ. ಬಿ.ಆರ್ ಅಂಬೇಡ್ಕರ್ ಭವನ ರಾಜ್ಯದ ಮುಖ್ಯಮಂತ್ರಿ  ಲೋಕಾರ್ಪಣೆಗೊಳಿಸುವಂತೆ ಹಾಗು ತಾಲೂಕಿನ ಎಲ್ಲಾ ಗ್ರಾಮಪಂಚಾಯಿತಿಗಳಲ್ಲಿ ಈ-ಸ್ವತ್ತು, ಜಾತಿ ಮತ್ತು ಆದಾಯ ಪ್ರಮಾಣಪತ್ರ ವಿತರಣೆ ಸೇರಿದಂತೆ ಇನ್ನಿತರ ಸೇವೆಗಳಲ್ಲಿ ಉಂಟಾಗುತ್ತಿರುವ ಸಮಸ್ಯೆಗಳನ್ನು ಖಂಡಿಸಿ ಸೆ.೧೫ರಂದು ನಗರದ ಮಾನವ ಹಕ್ಕುಗಳ ಹೋರಾಟ ಸಮಿತಿ ವತಿಯಿಂದ ಹೋರಾಟ ಹಮ್ಮಿಕೊಳ್ಳಲಾಗಿದೆ. 
    ಹಲವು ದಶಕಗಳ ನಿರಂತರ ಹೋರಾಟದ ಫಲವಾಗಿ ನಗರದಲ್ಲಿ ೨೦೧೮ರಲ್ಲಿ ಡಾ. ಬಿ.ಆರ್ ಅಂಬೇಡ್ಕರ್ ಭವನ ಕಾಮಗಾರಿ ಆರಂಭಗೊಂಡಿದ್ದು, ಸುಮಾರು ೭ ವರ್ಷಗಳ ನಂತರ ಪೂರ್ಣಗೊಂಡಿದೆ. ದಲಿತ ಚಳುವಳಿ ಹುಟ್ಟಿದ ನೆಲದಲ್ಲಿ ವಿಶ್ವಜ್ಞಾನ ಡಾ. ಬಿ.ಆರ್ ಅಂಬೇಡ್ಕರ್‌ರವರನ್ನು ಗೌರವಿಸಲು ನೂತನವಾಗಿ ನಿರ್ಮಾಣಗೊಂಡಿರುವ ಭವನ ನಾಡಿನ ಹಿಂದುಳಿದ ವರ್ಗಗಳ, ದೀನದಲಿತರ ನಾಯಕ, ಹಿರಿಯ ರಾಜಕೀಯ ಮುತ್ಸದ್ದಿ ಮುಖ್ಯಮಂತ್ರಿ ಸಿದ್ದರಾಮಯ್ಯರವರು ಲೋಕಾರ್ಪಣೆಗೊಳಿಸಬೇಕೆಂದು ಸಮಿತಿ ಒತ್ತಾಯಿಸುತ್ತದೆ. 
    ತಾಲೂಕಿನ ಗ್ರಾಮ ಪಂಚಾಯಿತಿಗಳಲ್ಲಿ ಸರ್ಕಾರದ ಸೇವೆಗಳನ್ನು ಪಡೆದುಕೊಳ್ಳಲು ಗ್ರಾಮೀಣ ಜನರು ಸಾಕಷ್ಟು ತೊಂದರೆ ಎದುರಿಸುತ್ತಿದ್ದು, ಈ ಹಿನ್ನಲೆಯಲ್ಲಿ ಕಾಲ ಕಾಲಕ್ಕೆ ಗ್ರಾಮ ಸಭೆ, ವಾರ್ಡ್ ಸಭೆ ನಡೆಸುವಂತೆ ಹಾಗು ಮಹಾತ್ಮಗಾಂಧಿ ರಾಷ್ಟ್ರೀಯ ಉದ್ಯೋಗ ಖಾತ್ರಿ ಯೋಜನೆಯಲ್ಲಿ ಉಂಟಾಗುತ್ತಿರುವ ಸಮಸ್ಯೆಗಳು, ಈ-ಸ್ವತ್ತು, ಜಾತಿ ಮತ್ತು ಆದಾಯ ಪ್ರಮಾಣ ಪತ್ರಗಳ ವಿತರಣೆಯಲ್ಲಿ ಮತ್ತು ಬಗರ್ ಹುಕುಂ ರೈತರಿಗೆ ಎದುರಾಗುತ್ತಿರುವ ಸಮಸ್ಯೆಗಳನ್ನು ಬಗೆಹರಿಸುವಂತೆ ಸಮಿತಿ ಆಗ್ರಹಿಸುತ್ತದೆ. 
    ಈ ಹಿನ್ನಲೆಯಲ್ಲಿ ಸಮಿತಿ ವತಿಯಿಂದ ಸೆ.೧೫ರಂದು ಬೆಳಿಗ್ಗೆ ೧೦ ಗಂಟೆಗೆ ಅಂಬೇಡ್ಕರ್ ಭವನ ಮುಂಭಾಗ ಧರಣಿ ನಡೆಸಿ ನಂತರ ತಾಲೂಕು ಕಛೇರಿ ಮುಂಭಾಗದಲ್ಲಿ ಧರಣಿ ಸತ್ಯಾಗ್ರಹ ನಡೆಸಲಾಗುವುದು. ವಿವಿಧ ಸಂಘ-ಸಂಸ್ಥೆಗಳು, ಕಾರ್ಮಿಕರು, ರೈತರು, ಮಹಿಳೆಯರು, ಗ್ರಾಮಸ್ಥರು, ವಿದ್ಯಾರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಯಶಸ್ವಿಗೊಳಿಸುವಂತೆ ಕೋರಲಾಗಿದೆ. 

ಫೆ.೧೪ರಂದು ಪ್ರತಿಭಾ ಪುರಸ್ಕಾರ, ನಿವೃತ್ತ ಶಿಕ್ಷಕರಿಗೆ ಗೌರವ ಸನ್ಮಾನ


    ಭದ್ರಾವತಿ: ತಾಲೂಕು ಪ್ರಾಥಮಿಕ ಮತ್ತು ಪ್ರೌಢ ಶಾಲಾ ಶಿಕ್ಷಕರ ಪತ್ತಿನ ಸಹಕಾರ ಸಂಘದ ವತಿಯಿಂದ ಸೆ.೧೪ರ ಭಾನುವಾರ ಬೆಳಗ್ಗೆ ೧೦ ಗಂಟೆಗೆ ನಗರದ ಹೊಸಸೇತುವೆ ರಸ್ತೆಯ ಸಿದ್ಧಾರೂಢನಗರದ ವಿಶ್ವೇಶ್ವರಾಯ ವಿದ್ಯಾಸಂಸ್ಥೆಯಲ್ಲಿ ಈ ಬಾರಿ ಎಸ್‌ಎಸ್‌ಎಲ್‌ಸಿ ಮತ್ತು ಪಿಯುಸಿ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕ ಪಡೆದಿರುವ ಸಂಘದ ಸದಸ್ಯರ ಮಕ್ಕಳಿಗೆ ಪ್ರತಿಭಾ ಪುರಸ್ಕಾರ ಮತ್ತು ನಿವೃತ್ತ ಸದಸ್ಯ ಶಿಕ್ಷಕರಿಗೆ ಗೌರವ ಸನ್ಮಾನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. 
    ಸಂಘದ ಸದಸ್ಯರ ಹಿತ ಕಾಯ್ದುಕೊಳ್ಳುವ ಜೊತೆಗೆ ವಿಶೇಷವಾಗಿ ಹಲವಾರು ಕಾರ್ಯಕ್ರಮಗಳನ್ನು ರೂಪಿಸಿಕೊಂಡು ಬರಲಾಗುತ್ತಿದೆ. ಸಂಘದ ೨೯ನೇ ವಾರ್ಷಿಕ ಮಹಾಸಭೆಯಲ್ಲಿ ಪ್ರತಿಭಾ ಪುರಸ್ಕಾರ ಮತ್ತು ಗೌರವ ಸನ್ಮಾನ ನಡೆಯಲಿದ್ದು, ಸಂಘದ ಅಧ್ಯಕ್ಷ ರಾಜಾನಾಯ್ಕ ನಲ್ಲಿಸರ ಅಧ್ಯಕ್ಷತೆವಹಿಸಲಿದ್ದಾರೆ. ಸದಸ್ಯರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಯಶಸ್ವಿಗೊಳಿಸುವಂತೆ ಕಾರ್ಯದರ್ಶಿ ಆರ್. ನಿಖಿಲ್ ಕೋರಿದ್ದಾರೆ.