ಶನಿವಾರ, ಅಕ್ಟೋಬರ್ 4, 2025

ರಾಷ್ಟ್ರಪಿತ ಮಹಾತ್ಮ ಗಾಂಧಿಯವರ ಬದುಕು, ತತ್ವಾದರ್ಶಗಳು ನಮ್ಮೆಲ್ಲರ ದಿನನಿತ್ಯದ ಜೀವನದ ಅವಿಭಾಗ್ಯ ಅಂಗವಾಗಿರಲಿ

ವಿಶ್ವೇಶ್ವರಾಯ ಕಬ್ಬಿಣ ಮತ್ತು ಉಕ್ಕಿನ ಕಾರ್ಖಾನೆ ಕಾರ್ಯಪಾಲಕ ನಿರ್ದೇಶಕ ಬಿ.ಎಲ್ ಚಂದ್ವಾನಿ 

ಭದ್ರಾವತಿ ನ್ಯೂಟೌನ್, ವಿಐಎಸ್‌ಎಲ್ ಭದ್ರ್ರಾ ಅತಿಥಿಗೃಹದಲ್ಲಿ ಆಯೋಜಿಸಲಾಗಿದ್ದ ಗಾಂಧಿ ಜಯಂತಿ ಕಾರ್ಯಕ್ರಮದಲ್ಲಿ ಕಾರ್ಖಾನೆ ಕಾರ್ಯಪಾಲಕ ನಿರ್ದೇಶಕ ಬಿ.ಎಲ್ ಚಂದ್ವಾನಿ, ಮುಖ್ಯ ಮಹಾಪ್ರಬಂಧಕ(ಸ್ಥಾವರ) ಕೆ.ಎಸ್ ಸುರೇಶ್, ಮಹಾಪ್ರಬಂಧಕ(ಸಾರ್ವಜನಿಕ ಸಂಪರ್ಕ) ಎಲ್. ಪ್ರವೀಣ್ ಕುಮಾರ್, ಕಾರ್ಮಿಕ ಸಂಘದ ಅಧ್ಯಕ್ಷ ಜೆ. ಜಗದೀಶ್, ಅಧಿಕಾರಿಗಳ ಸಂಘದ ಅಧ್ಯಕ್ಷ ಪಾರ್ಥಸಾರಥಿ ಮಿಶ್ರ, ಇಸ್ಪಾತ್ ಮಹಿಳಾ ಸಮಾಜ ಉಪಾಧ್ಯಕ್ಷೆ ಶೋಭ ಶಿವಶಂಕರನ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.
    ಭದ್ರಾವತಿ: ರಾಷ್ಟ್ರಪಿತ ಮಹಾತ್ಮ ಗಾಂಧಿಯವರ ಬದುಕು, ತತ್ವಾದರ್ಶಗಳು ನಮ್ಮ ದಿನನಿತ್ಯದ ಜೀವನದ ಅವಿಭಾಜ್ಯ ಅಂಗವಾಗಿಸಿಕೊಂಡು ಸಮಾಜದಲ್ಲಿ ನಿರಂತರವಾಗಿ ಸುಧಾರಣೆ ತರಲು ಪ್ರಯತ್ನಿಸಬೇಕೆಂದು ಕೇಂದ್ರ ಉಕ್ಕು ಪ್ರಾಧಿಕಾರದ ನಗರದ ವಿಶ್ವೇಶ್ವರಾಯ ಕಬ್ಬಿಣ ಮತ್ತು ಉಕ್ಕಿನ ಕಾರ್ಖಾನೆ ಕಾರ್ಯಪಾಲಕ ನಿರ್ದೇಶಕ ಬಿ.ಎಲ್ ಚಂದ್ವಾನಿ ಹೇಳಿದರು. 
    ಅವರು ಕಾರ್ಖಾನೆಯ ನ್ಯೂಟೌನ್, ವಿಐಎಸ್‌ಎಲ್ ಭದ್ರ್ರಾ ಅತಿಥಿಗೃಹದಲ್ಲಿ ಆಯೋಜಿಸಲಾಗಿದ್ದ ಗಾಂಧಿ ಜಯಂತಿ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದರು.  
    ಅಹಿಂಸಾ ಮಾರ್ಗದ ಮೂಲಕ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟ ಮಹಾತ್ಮಗಾಂಧಿಯವರ ಬದುಕು ಅವಿಸ್ಮರಣೀಯವಾಗಿದೆ. ಈ ದೇಶದ ಪ್ರತಿಯೊಬ್ಬರಿಗೂ ಆದರ್ಶಪ್ರಾಯವಾಗಿದೆ ಎಂದರು. ಅಲ್ಲದೆ ದೇಶದ ಎರಡನೇ ಪ್ರಧಾನಮಂತ್ರಿ ಲಾಲ್ ಬಹದ್ಧೂರ್ ಶಾಸ್ತ್ರಿಯವರ ಬದುಕು ಸಹ ವೈಶಿಷ್ಟ್ಯಪೂರ್ಣವಾಗಿದ್ದು,  ಅವರ ಜೀವನಾದರ್ಶಗಳು ನಮಗೆ ದಾರಿದೀಪವಾಗಲೆಂದು ಆಶಿಸಿದರು.
ಧಾರ್ಮಿಕ ಗ್ರಂಥಗಳ ಆಯ್ದ ಭಾಗಗಳನ್ನು ಭಗವದ್ಗೀತೆ ಅಧಿತ್ರಿ ರಾಘವೇಂದ್ರ (ಕೆ.ಎಸ್. ರಾಘವೇಂದ್ರರವರ ಸುಪುತ್ರಿ), ಬೈಬಲ್ ಶಾಜಿ ಅಬ್ರಹಾಂ ಮತ್ತು ಕುರಾನ್ ರಿಯಾ ಅಂಜುಮ್ ಹಾಗೂ ರಿನಾಜ್ ಅಂಜುಮ್ (ರಿಜ್ವಾನ್ ಬೇಗ್‌ರವರ ಪುತ್ರಿಯರು) ಪಠಿಸಿದರು. ಸೈಲ್ ಶಭಾಷ್ ಯೋಜನೆಯಡಿ ತಮ್ಮ ಕ್ಷೇತ್ರದಲ್ಲಿ ಉತ್ತಮ ಸಾಧನೆ ಮಾಡಿದ ಉದ್ಯೋಗಿಗಳಿಗೆ ಪ್ರಶಂಸಾಪತ್ರವನ್ನು ನೀಡಿ ಗೌರವಿಸಲಾಯಿತು.
    ಮುಖ್ಯ ಮಹಾಪ್ರಬಂಧಕ(ಸ್ಥಾವರ) ಕೆ.ಎಸ್ ಸುರೇಶ್, ಮಹಾಪ್ರಬಂಧಕ(ಸಾರ್ವಜನಿಕ ಸಂಪರ್ಕ) ಎಲ್. ಪ್ರವೀಣ್ ಕುಮಾರ್, ಕಾರ್ಮಿಕ ಸಂಘದ ಅಧ್ಯಕ್ಷ ಜೆ. ಜಗದೀಶ್, ಅಧಿಕಾರಿಗಳ ಸಂಘದ ಅಧ್ಯಕ್ಷ ಪಾರ್ಥಸಾರಥಿ ಮಿಶ್ರ, ಇಸ್ಪಾತ್ ಮಹಿಳಾ ಸಮಾಜ ಉಪಾಧ್ಯಕ್ಷೆ ಶೋಭ ಶಿವಶಂಕರನ್, ವಿಐಎಸ್‌ಎಲ್ ಉದ್ಯೋಗಿಗಳು, ವಿಐಎಸ್‌ಎಲ್ ಕಾರ್ಮಿಕ ಸಂಘ ಮತ್ತು ಅಧಿಕಾರಿಗಳ ಸಂಘದ ಪದಾಧಿಕಾರಿಗಳು ಮತ್ತು ಕಾರ್ಯಕಾರಿ ಸಮಿತಿ ಸದಸ್ಯರುಗಳು, ಗುತ್ತಿಗೆ ಕಾರ್ಮಿಕರು, ಇಸ್ಪಾತ್ ಮಹಿಳಾ ಸಮಾಜದ ಸದಸ್ಯರು ಸೇರಿದಂತೆ ಇನ್ನಿತರರು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.  

ಬಿಪಿಎಲ್ ಸಂಘದಿಂದ ಮಹಾತ್ಮಗಾಂಧಿ ಜಯಂತಿ

ಭದ್ರಾವತಿ ನಗರದ ನ್ಯೂಟೌನ್ ವಿಐಎಸ್‌ಎಲ್ ಆಸ್ಪತ್ರೆ ಸಮೀಪದ ಪ್ರಜಾ ವಿಮೋಚನಾ ಸಂಘ(ಬಿಪಿಎಲ್)ದಿಂದ ಪ್ರತಿ ವರ್ಷದಂತೆ ಈ ಬಾರಿ ಸಹ ರಾಷ್ಟ್ರಪಿತ ಮಹಾತ್ಮಗಾಂಧಿ ಜಯಂತಿ ಆಚರಿಸಲಾಯಿತು. 
ಭದ್ರಾವತಿ: ನಗರದ ನ್ಯೂಟೌನ್ ವಿಐಎಸ್‌ಎಲ್ ಆಸ್ಪತ್ರೆ ಸಮೀಪದ ಪ್ರಜಾ ವಿಮೋಚನಾ ಸಂಘ(ಬಿಪಿಎಲ್)ದಿಂದ ಪ್ರತಿ ವರ್ಷದಂತೆ  ಈ ಬಾರಿ ಸಹ ರಾಷ್ಟ್ರಪಿತ ಮಹಾತ್ಮಗಾಂಧಿ ಜಯಂತಿ ಆಚರಿಸಲಾಯಿತು. 
ಸಂಘದ ಕಛೇರಿಯಲ್ಲಿ ಮಹಾತ್ಮಗಾಂಧಿಯವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಲಾಯಿತು. ಅಲ್ಲದೆ ವಿಶೇಷವಾಗಿ ಸಸಿ ನೆಡುವ ಮೂಲಕ ಸಿಹಿ ಹಂಚಲಾಯಿತು. ಸಂಘದಿಂದ ನಾಡಹಬ್ಬ ಹಾಗು ರಾಷ್ಟ್ರೀಯ ಹಬ್ಬಗಳನ್ನು ಆಚರಿಸಿಕೊಂಡು ಬರಲಾಗುತ್ತಿದೆ. 
ಕಾರ್ಯಕ್ರಮದಲ್ಲಿ ಸಂಘದ ಪ್ರಧಾನ ಕಾರ್ಯದರ್ಶಿ ಶ್ಯಾಮ್, ಉಪಾಧ್ಯಕ್ಷ ಸಂಪತ್, ಸಹ ಕಾರ್ಯದರ್ಶಿ ದಾಸ್, ನಿರ್ದೇಶಕರಾದ ನಿರಂಜನ್, ರಘು, ಸಂತೋಷ್(ಶಾಸ್ತ್ರಿ), ಫಿಲೀಪ್, ಮುರುಳಿ ಹಾಗು ೨೬ನೇ ವಾಡ್ ಯುವ ಮುಖಂಡ ಯತೀಶ್ ಸೇರಿದಂತೆ ಇನ್ನಿತರರು ಭಾಗವಹಿಸಿದ್ದರು.  
 

ವಿಐಎಸ್‌ಎಲ್-ಎಂಪಿಎಂ ಕಾರ್ಖಾನೆಗಳ ಪುನಶ್ಚೇತನಗೊಳಿಸುವಲ್ಲಿ ಆಡಳಿತದಲ್ಲಿರುವ ರಾಜಕೀಯ ಪಕ್ಷಗಳು ವಿಫಲ

ಚುನಾವಣೆ ಸಂದರ್ಭದಲ್ಲಿ ನೀಡಿರುವ ಭರವಸೆಯಂತೆ ಶಾಸಕ ಸಂಗಮೇಶ್ವರ್‌ಗೆ ಸಚಿವ ಸ್ಥಾನ ನೀಡಿ 

ಭದ್ರಾವತಿಯಲ್ಲಿ ಶನಿವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ಸಾಮಾಜಿಕ ಹೋರಾಟಗಾರ ಶಶಿಕುಮಾರ್ ಎಸ್. ಗೌಡ ಮಾತನಾಡಿದರು. 
    ಭದ್ರಾವತಿ : ಕೇಂದ್ರ ಉಕ್ಕು ಪ್ರಾಧಿಕಾರದ ನಗರದ ವಿಶ್ವೇಶ್ವರಾಯ ಕಬ್ಬಿಣ ಮತ್ತು ಉಕ್ಕಿನ ಕಾರ್ಖಾನೆ ಹಾಗು ರಾಜ್ಯ ಸರ್ಕಾರಿ ಸ್ವಾಮ್ಯದ ಮೈಸೂರು ಕಾಗದ ಕಾರ್ಖಾನೆ ಈ ಎರಡು ಕಾರ್ಖಾನೆಗಳನ್ನು ಪುನಶ್ಚೇತನಗೊಳಿಸುವಲ್ಲಿ ಕೇಂದ್ರ ಹಾಗು ರಾಜ್ಯದಲ್ಲಿ ಅಧಿಕಾರದ ಚುಕ್ಕಾಣಿ ಹಿಡಿದಿರುವ ರಾಜಕೀಯ ಪಕ್ಷಗಳು ವಿಫಲವಾಗಿವೆ. ಕ್ಷೇತ್ರದ ಜನರಿಗೆ ನೀಡಿರುವ ಭರವಸೆಯಂತೆ ನಡೆದುಕೊಳ್ಳುವ ಮೂಲಕ ಈ ಎರಡು ಕಾರ್ಖಾನೆಗಳನ್ನು ಪುನಶ್ಚೇತನಗೊಳಿಸಬೇಕೆಂದು ಸಾಮಾಜಿಕ ಹೋರಾಟಗಾರ ಶಶಿಕುಮಾರ್ ಎಸ್. ಗೌಡ ಆಗ್ರಹಿಸಿದ್ದಾರೆ. 
    ಅವರು ಶನಿವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಕೇಂದ್ರದಲ್ಲಿ ಅಧಿಕಾರದ ಚುಕ್ಕಾಣಿ ಹಿಡಿದಿರುವ ಬಿಜೆಪಿ ಮತ್ತು ಜೆಡಿಎಸ್ ಪಕ್ಷಗಳು ವಿಐಎಸ್‌ಎಲ್ ಕಾರ್ಖಾನೆ ಪುನಶ್ಚೇತನಗೊಳಿಸುವ ಕಾರ್ಯದಲ್ಲಿ ಯಶಸ್ಸು ಕಂಡಿಲ್ಲ.  ಲೋಕಸಭೆ ಚುನಾವಣೆ ಸಂದರ್ಭದಲ್ಲಿ ಹಲವು ಬಾರಿ ಕಾರ್ಖಾನೆ ಪುನಶ್ಚೇತನಗೊಳಿಸುವುದಾಗಿ ಭರವಸೆ ನೀಡಿ ಮತಗಳಿಕೆ ಮಾಡಿಕೊಳ್ಳುವ ಸಂಸದ ಬಿ.ವೈ ರಾಘವೇಂದ್ರರವರು ಕೇಂದ್ರ ಸರ್ಕಾರದ ಗಮನ ಸೆಳೆದು ಕಾರ್ಖಾನೆಗೆ ಅಗತ್ಯವಿರುವ ಬಂಡವಾಳ ತೊಡಗಿಸುವಂತೆ ಮಾಡುವಲ್ಲಿ ವಿಫಲರಾಗಿದ್ದಾರೆಂದು ಆರೋಪಿಸಿದರು. 
    ಪ್ರಸ್ತುತ ಕೇಂದ್ರ ಸರ್ಕಾರದಲ್ಲಿ ಬೃಹತ್ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವರಾಗಿರುವ ಮಾಜಿ ಮುಖ್ಯಮಂತ್ರಿ ಎಚ್.ಡಿ ಕುಮಾರಸ್ವಾಮಿಯವರು ಸುಮಾರು ೧೫ ಸಾವಿರ ಕೋ.ರು. ಬಂಡವಾಳ ತೊಡಗಿಸಿ ಪುನಶ್ಚೇತನಗೊಳಿಸುವುದಾಗಿ ಭರವಸೆ ನೀಡಿದ್ದರು. ಈ ಕಾರ್ಯದಲ್ಲಿ ಇದುವರೆಗೂ ಕುಮಾರಸ್ವಾಮಿಯವರು ಯಾವುದೇ ಯಶಸ್ಸು ಕಂಡಿಲ್ಲದಿರುವುದು ವಿಪರ್ಯಾಸದ ಸಂಗತಿಯಾಗಿದೆ ಎಂದರು. 
    ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್‌ರವರು ಚುನಾವಣೆ ಸಂದರ್ಭದಲ್ಲಿ ಹಲವು ಬಾರಿ ಮೈಸೂರು ಕಾಗದ ಕಾರ್ಖಾನೆ ಪುನಶ್ಛೇತನಗೊಳಿಸುವುದಾಗಿ ಭರವಸೆ ನೀಡಿದ್ದರು. ಅಲ್ಲದೆ ೪ ಕ್ಷೇತ್ರದ ಶಾಸಕರಾಗಿರುವ ಬಿ.ಕೆ ಸಂಗಮೇಶ್ವರ್‌ರವರಿಗೆ ಮತ ನೀಡಿದ್ದಲ್ಲಿ ಅವರಿಗೆ ಸಚಿವ ಸ್ಥಾನ ನೀಡುವುದಾಗಿ ಭರವಸೆ ನೀಡಿದ್ದರು. ಇದುವರೆಗೂ ಎಂಪಿಎಂ ಕಾರ್ಖಾನೆ ಸಹ ಪುನಶ್ಚೇತನಗೊಂಡಿಲ್ಲ. ಅಲ್ಲದೆ ಸಂಗಮೇಶ್ವರ್‌ಗೆ ಸಚಿವ ಸ್ಥಾನ ಸಹ ಲಭಿಸಿಲ್ಲ.  ಕ್ಷೇತ್ರದ ಜನರಿಗೆ ನೀಡಿರುವ ಭರವಸೆಯಂತೆ ಸಿದ್ದರಾಮಯ್ಯ ಮತ್ತು ಡಿ.ಕೆ ಶಿವಕುಮಾರ್ ಇಬ್ಬರು ಸಹ ನಡೆದುಕೊಳ್ಳಬೇಕು.  ಪ್ರಸ್ತುತ ರಾಜ್ಯ ಸರ್ಕಾರದ ಮಂತ್ರಿ ಮಂಡಲದಲ್ಲಿ ಸಚಿವ ಸ್ಥಾನ ಬದಲಾವಣೆ ಕುರಿತು ಚರ್ಚೆಯಾಗುತ್ತಿರುವ ವಿಷಯ ಗಮನಕ್ಕೆ ಬಂದಿದ್ದು, ಸಂಗಮೇಶ್ವರ್‌ಗೆ ಈ ಬಾರಿಯಾದರೂ ಸಚಿವ ಸ್ಥಾನ ನೀಡಬೇಕೆಂದು ಆಗ್ರಹಿಸಿದರು. 
    ಪತ್ರಿಕಾಗೋಷ್ಠಿಯಲ್ಲಿ ಕರುನಾಡ ಹಿತ ರಕ್ಷಣಾ ಸಮಿತಿ ರಾಜ್ಯಾಧ್ಯಕ್ಷ ವೈ. ಶಶಿಕುಮಾರ್, ವಿವಿಧ ಸಂಘಟನೆಗಳ ಮುಖಂಡರಾದ ವೆಂಕಟೇಶ್, ವಿಜಯಕುಮಾರ್, ಪರಮೇಶ್ವರ್, ಇಂದ್ರಮ್ಮ, ಮಹಾದೇವಿ, ದಿವ್ಯಾಶ್ರೀ, ಜಟ್ಟೋಜಿರಾವ್ ಮತ್ತು ಶಿವಶಂಕರ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.