ಸೋಮವಾರ, ಅಕ್ಟೋಬರ್ 13, 2025

ಪಿಎಲ್‌ಡಿ ಬ್ಯಾಂಕ್ ಅಧ್ಯಕ್ಷ ಬಿ.ಕೆ ಶಿವಕುಮಾರ್ ಜಿಲ್ಲಾ ಸಹಕಾರ ಯೂನಿಯನ್ ನಿರ್ದೇಶಕರಾಗಿ ಆಯ್ಕೆ

ಶಿವಮೊಗ್ಗ ಜಿಲ್ಲಾ ಸಹಕಾರ ಯೂನಿಯನ್ ನಿಯಮಿತ ಚುನಾವಣೆಯಲ್ಲಿ ಗೆಲುವು ಸಾಧಿಸಿ ನೂತನ ನಿರ್ದೇಶಕರಾಗಿ ಆಯ್ಕೆಯಾಗಿರುವ ಭದ್ರಾವತಿ ಪಿಎಲ್‌ಡಿ ಬ್ಯಾಂಕ್ ಅಧ್ಯಕ್ಷ ಬಿ.ಕೆ ಶಿವಕುಮಾರ್ ಅವರನ್ನು ಶಾಸಕ ಬಿ.ಕೆ ಸಂಗಮೇಶ್ವರ್, ಉದ್ಯಮಿ ಬಿ.ಕೆ ಜಗನ್ನಾಥ್, ನಗರಸಭೆ ಹಿರಿಯ ಸದಸ್ಯ ಬಿ.ಕೆ ಮೋಹನ್  ಸೇರಿದಂತೆ ವಿವಿಧ ಸಂಘ-ಸಂಸ್ಥೆಗಳ ಪ್ರಮುಖರು, ಗಣ್ಯರು ಅಭಿನಂದಿಸಿದ್ದಾರೆ. 
    ಭದ್ರಾವತಿ: ಕರ್ನಾಟಕ ಗ್ರಾಮೀಣ ಮೂಲ ಸೌಕರ್ಯ ಅಭಿವೃಧ್ಧಿ ನಿಗಮದ ಅಧ್ಯಕ್ಷರಾದ ಶಾಸಕ ಬಿ.ಕೆ ಸಂಗಮೇಶ್ವರ್ ಸಹೋದರ ಹಾಗು ನಗರದ ಪ್ರಾಥಮಿಕ ಸಹಕಾರಿ ಕೃಷಿ ಮತ್ತು ಗ್ರಾಮೀಣಾಭಿವೃದ್ಧಿ ಬ್ಯಾಂಕ್(ಪಿಎಲ್‌ಡಿ ಬ್ಯಾಂಕ್) ಅಧ್ಯಕ್ಷ ಬಿ.ಕೆ ಶಿವಕುಮಾರ್‌ರವರು ಶಿವಮೊಗ್ಗ ಜಿಲ್ಲಾ ಸಹಕಾರ ಯೂನಿಯನ್ ನಿಯಮಿತ ಚುನಾವಣೆಯಲ್ಲಿ ಗೆಲುವು ಸಾಧಿಸುವ ಮೂಲಕ ನಿರ್ದೇಶಕರಾಗಿ ಆಯ್ಕೆಯಾಗಿದ್ದಾರೆ. 
    ಪ್ರತಿ ೫ ವರ್ಷಕ್ಕೆ ನಡೆಯುವ ಚುನಾವಣೆಯಲ್ಲಿ ಈ ಬಾರಿ ಕ್ಷೇತ್ರದಿಂದ ಬಿ.ಕೆ ಶಿವಕುಮಾರ್ ಸ್ಪರ್ಧಿಸಿದ್ದರು. ಹಾಲಿ ನಿರ್ದೇಶಕರಾಗಿದ್ದ ನಗರದ ಸಂಜೀವಕುಮಾರ್ ವಿರುದ್ಧ ಗೆಲುವು ಸಾಧಿಸಿದ್ದಾರೆ. ಮೊದಲ ಬಾರಿಗೆ ಶಿವಮೊಗ್ಗ ಜಿಲ್ಲಾ ಸಹಕಾರ ಯೂನಿಯನ್ ನಿಯಮಿತ ನಿರ್ದೇಶಕರಾಗಿ ಆಯ್ಕೆಯಾಗಿದ್ದಾರೆ. 
    ಈ ಹಿಂದಿನ ಅವಧಿಯಲ್ಲಿ ಕ್ಷೇತ್ರದಿಂದ ಹಿರಿಯ ಸಹಕಾರ ಧುರೀಣರಾದ ಜಿಲ್ಲಾ ಪಂಚಾಯತ್ ಮಾಜಿ ಸದಸ್ಯ ಎಚ್.ಎಲ್ ಷಡಾಕ್ಷರಿ, ಜಯರಾಂ ಗೊಂದಿ, ಭಾವಸಾರ ಕ್ಷತ್ರಿಯ ಕೋ-ಆಪರೇಟಿವ್ ಸೊಸೈಟಿ ಅಧ್ಯಕ್ಷ ದುಗ್ಗೇಶ್ ತೇಲ್ಕರ್ ಮತ್ತು ಯುವ ಮುಖಂಡ ಸಂಜೀವಕುಮಾರ್ ಸೇರಿದಂತೆ ಒಟ್ಟು ೪ ಜನರು ಆಯ್ಕೆಯಾಗಿದ್ದರು. ಈ ಪೈಕಿ ದುಗ್ಗೇಶ್ ತೇಲ್ಕರ್ ಮತ್ತು ಎಚ್.ಎಲ್ ಷಡಾಕ್ಷರಿಯವರು ಅಧ್ಯಕ್ಷರಾಗಿ ಹಾಗು ಸಂಜೀವಕುಮಾರ್ ಉಪಾಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದಾರೆ. 
    ಶಿವಮೊಗ್ಗ ಜಿಲ್ಲಾ ಸಹಕಾರ ಯೂನಿಯನ್ ನಿಯಮಿತ ಈ ಬಾರಿ ಶಿವಮೊಗ್ಗ ಮತ್ತು ಸಾಗರ ಎರಡು ವಿಭಾಗಗಳನ್ನಾಗಿ ವಿಂಗಡಿಸಿ ಚುನಾವಣೆ ನಡೆಸಲಾಗಿತ್ತು. ಒಟ್ಟು ೧೫ ನಿರ್ದೇಶಕರ ಸ್ಥಾನಗಳನ್ನು ಒಳಗೊಂಡಿದೆ. 
    ನೂತನ ನಿರ್ದೇಶಕರಾಗಿ ಆಯ್ಕೆಯಾಗಿರುವ ಬಿ.ಕೆ ಶಿವಕುಮಾರ್ ಅವರನ್ನು ಶಾಸಕ ಬಿ.ಕೆ ಸಂಗಮೇಶ್ವರ್, ಉದ್ಯಮಿ ಬಿ.ಕೆ ಜಗನ್ನಾಥ್, ನಗರಸಭೆ ಹಿರಿಯ ಸದಸ್ಯ ಬಿ.ಕೆ ಮೋಹನ್  ಸೇರಿದಂತೆ ವಿವಿಧ ಸಂಘ-ಸಂಸ್ಥೆಗಳ ಪ್ರಮುಖರು, ಗಣ್ಯರು ಅಭಿನಂದಿಸಿದ್ದಾರೆ. 
    ಬಿ.ಕೆ ಶಿವಕುಮಾರ್‌ರವರು ಈ ವರ್ಷ ಆರಂಭದಲ್ಲಿ ಜನವರಿ ತಿಂಗಳಿನಲ್ಲಿ ಪಿಎಲ್‌ಡಿ ಬ್ಯಾಂಕ್ ಅಧ್ಯಕ್ಷರಾಗಿ ಆಯ್ಕೆಯಾಗಿದ್ದರು. ಇವರು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀಹೆಬ್ಬಾಳ್ಕರ್ ಬೀಗರಾಗಿದ್ದು, ಹಂತ ಹಂತವಾಗಿ ಸಹಕಾರ ಕ್ಷೇತ್ರದಲ್ಲಿ ಗುರುತಿಸಿಕೊಳ್ಳುತ್ತಿದ್ದಾರೆ.