ಸೋಮವಾರ, ನವೆಂಬರ್ 10, 2025

ವಿದ್ಯಾರ್ಥಿಗಳ ಶೈಕ್ಷಣಿಕ ಅಭಿವೃದ್ದಿಗೆ ಕಾಂಗ್ರೆಸ್ ಸರ್ಕಾರ ಹೆಚ್ಚಿನ ಆದ್ಯತೆ : ಶಾಸಕ ಬಿ.ಕೆ ಸಂಗಮೇಶ್ವರ್

ಭದ್ರಾವತಿ ನಗರಸಭೆ ಕಚೇರಿ ಮುಂಭಾಗದ ವಿನೋಬಾಭಾವೆ ಉದ್ಯಾನವನದಲ್ಲಿ ಸೋಮವಾರ ಆಯೋಜಿಸಲಾಗಿದ್ದ ಮುಖ್ಯಮಂತ್ರಿಗಳ ಅಮೃತ್ ನಗರೋತ್ಥಾನ ಯೋಜನೆ (ಹಂತ-೪)ರ ಶೇ.೨೪.೧೦ರ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ, ಶೇ.೭.೨೫ ಇತರೆ ಬಡವರ್ಗದವರ ಮತ್ತು ಶೇ.೫ ವಿಕಲಚೇತನರ ಕಲ್ಯಾಣ ಯೋಜನೆಗಳಡಿ ಪ್ರಸಕ್ತ ಸಾಲಿನಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಪ್ರೋತ್ಸಾಹಧನ ಚೆಕ್ ವಿತರಣೆ ಕಾರ್ಯಕ್ರಮ ಕರ್ನಾಟಕ ರಾಜ್ಯ ಗ್ರಾಮೀಣ ಮೂಲಸೌಕರ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಶಾಸಕ ಬಿ.ಕೆ ಸಂಗಮೇಶ್ವರ್ ಉದ್ಘಾಟಿಸಿದರು. 
    ಭದ್ರಾವತಿ: ವಿದ್ಯಾರ್ಥಿಗಳ ಶೈಕ್ಷಣಿಕ ಅಭಿವೃದ್ದಿಗೆ ಕಾಂಗ್ರೆಸ್ ಸರ್ಕಾರ ಹೆಚ್ಚಿನ ಆದ್ಯತೆ ನೀಡುತ್ತಿದ್ದು, ಅದರಲ್ಲೂ ವಿಶೇಷವಾಗಿ ಹಿಂದುಳಿದವರು, ದಲಿತರು, ಪರಿಶಿಷ್ಟ ಜಾತಿ ಹಾಗು ಪರಿಶಿಷ್ಟ ಪಂಗಡದವರು ಮತ್ತು ವಿಕಲಚೇತನರಿಗೆ ಹಲವಾರು ಯೋಜನೆಗಳನ್ನು ರೂಪಿಸಿದೆ. ಇದರ ಸದುಪಯೋಗ ಪಡೆದುಕೊಳ್ಳಬೇಕೆಂದು ಕರ್ನಾಟಕ ರಾಜ್ಯ ಗ್ರಾಮೀಣ ಮೂಲಸೌಕರ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಶಾಸಕ ಬಿ.ಕೆ ಸಂಗಮೇಶ್ವರ್ ಕೋರಿದರು. 
    ಅವರು ಸೋಮವಾರ ನಗರಸಭೆ ಕಚೇರಿ ಮುಂಭಾಗದ ವಿನೋಬಾಭಾವೆ ಉದ್ಯಾನವನದಲ್ಲಿ ಆಯೋಜಿಸಲಾಗಿದ್ದ ಮುಖ್ಯಮಂತ್ರಿಗಳ ಅಮೃತ್ ನಗರೋತ್ಥಾನ ಯೋಜನೆ (ಹಂತ-೪)ರ ಶೇ.೨೪.೧೦ರ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ, ಶೇ.೭.೨೫ ಇತರೆ ಬಡವರ್ಗದವರ ಮತ್ತು ಶೇ.೫ ವಿಕಲಚೇತನರ ಕಲ್ಯಾಣ ಯೋಜನೆಗಳಡಿ ಪ್ರಸಕ್ತ ಸಾಲಿನಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಪ್ರೋತ್ಸಾಹಧನ ಚೆಕ್ ವಿತರಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. 
    ನಗರಸಭೆ ಹಿರಿಯ ಸದಸ್ಯ ಬಿ.ಕೆ.ಮೋಹನ್ ಮಾತನಾಡಿ, ಬಡವರು, ದಲಿತರು, ಹಿಂದುಳಿದ ಹಾಗೂ ಅಲ್ಪಸಂಖ್ಯಾತರ ಮಕ್ಕಳು ಶಿಕ್ಷಣದಿಂದ ವಂಚಿತರಾಗಬಾರದೆಂಬ ಉದ್ದೇಶದಿಂದ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಶಾಲಾ ಶಿಕ್ಷಣ ಹಾಗು ಸಾಕ್ಷರತಾ ಇಲಾಖೆ ಸಚಿವ ಎಸ್. ಮಧು ಬಂಗಾರಪ್ಪ ಸರ್ಕಾರಿ ಶಾಲೆಗಳಲ್ಲಿ ಅನೇಕ ಉಪಯುಕ್ತ ಯೋಜನೆಗಳನ್ನು ಅನುಷ್ಠಾನಗೊಳಿಸಿದ್ದಾರೆ. ಅವುಗಳಲ್ಲಿ ಪ್ರಮುಖವಾಗಿ ಮಧ್ಯಾಹ್ನದ ಬಿಸಿಯೂಟ, ಉಚಿತ ಸಮವಸ್ತ್ರ, ಉಚಿತ ಪಠ್ಯ ಪುಸ್ತಕ ವಿತರಣೆ ಸೇರಿದಂತೆ ಹಲವು ಯೋಜನೆಗಳು ಸೇರಿವೆ ಎಂದರು. 
    ನಗರಸಭೆಯಿಂದ ಆಶ್ರಯ ಯೋಜನೆಯಡಿ ನಿರ್ಮಿಸಲಾಗುತ್ತಿರುವ ಜಿ+೩ ಗುಂಪು ಮನೆಗಳ ಕಾಮಗಾರಿ ಒಂದು ವರ್ಷದಲ್ಲಿ ಪೂರ್ಣಗೊಳ್ಳಲಿದೆ. ಆಯ್ಕೆಯಾದ ಹಾಗು ಮುಂಗಡ ೧೦ ಸಾವಿರ ರು. ಪಾವತಿಸಿರುವ ೨೦೫೦ ಫಲಾನುಭವಿಗಳಿಗೆ ಮುಂದಿನ ಒಂದೂವರೆ ವರ್ಷದಲ್ಲಿ ಮನೆಗಳನ್ನು ವಿತರಿಸಲಾಗುವುದು. ಯಾರೂ ಆತಂಕಕ್ಕೆ ಒಳಗಾಗಬಾರದು ಎಂದು ಮನವಿ ಮಾಡಿದರು. 
ಸದಸ್ಯ ಚೆನ್ನಪ್ಪ ಮಾತನಾಡಿ, ಶಾಸಕರು ಕ್ಷೇತ್ರದ ಅಭಿವೃದ್ದಿಯನ್ನೇ ಜೀವಾಳ ಮಾಡಿಕೊಂಡಿದ್ದಾರೆ. ಅವರಿಗೆ ಕುಟುಂಬ ಸದಸ್ಯರೆಲ್ಲರೂ ಕೈಜೋಡಿಸಿದಂತೆ ನಗರಸಭೆ ಎಲ್ಲಾ ಸದಸ್ಯರೂ ಅವರೊಂದಿಗೆ ಶ್ರಮಿಸುತ್ತಿದ್ದೇವೆ. ಸರ್ಕಾರದ ವಿವಿಧ ಇಲಾಖೆಗಳಿಂದ ಸಾವಿರಾರು ಕೋಟಿ ರು. ಅನುದಾನ ಮಂಜೂರಾತಿ ಮಾಡಿಸಿರುವ ರಾಜ್ಯದ ಏಕೈಕ ಶಾಸಕ ಬಿ.ಕೆ ಸಂಗಮೇಶ್ವರ್ ಎಂದು  ಬಣ್ಣಿಸಿದರು. 
    ಪೌರಾಯುಕ್ತ ಕೆ.ಎನ್ ಹೇಮಂತ್ ಪ್ರಾಸ್ತಾವಿಕ ನುಡಿಗಳನ್ನಾಡಿ, ನಗರಸಭೆ ೨೦೨೨-೨೩ನೇ ಸಾಲಿನ ಮುಖ್ಯಮಂತ್ರಿಗಳ ಅಮೃತ್ ನಗರೋತ್ಥಾನ ಯೋಜನೆ (ಹಂತ-೪)ರ ಶೇ.೨೪.೧೦ರ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ, ಶೇ.೭.೨೫ ಇತರೆ ಬಡವರ್ಗದವರ ಮತ್ತು ಶೇ.೫ ವಿಕಲಚೇತನರ ಕಲ್ಯಾಣ ಯೋಜನೆಗಳಡಿ ೨೯ ಶಾಲಾ ಕಾಲೇಜುಗಳ ಒಟ್ಟು ೫೬೩ ವಿದ್ಯಾರ್ಥಿಗಳಿಗೆ ಒಟ್ಟು ೨೭.೪೧ ಲಕ್ಷ ರು.ಗಳ ಪ್ರೋತ್ಸಾಹ ಧನದ ಚೆಕ್ ವಿತರಿಸಲಾಗುತ್ತಿದೆ. ಇದರ ಸದುಪಯೋಗ ಪಡೆದುಕೊಳ್ಳಬೇಕೆಂದು ಕೋರಿದರು.
      ನಗರಸಭೆ ಅಧ್ಯಕ್ಷೆ ಜೆ.ಸಿ ಗೀತಾ ರಾಜಕುಮಾರ್, ಉಪಾಧ್ಯಕ್ಷ ಮಣಿ ಎಎನ್‌ಎಸ್, ಸ್ಥಾಯಿ ಸಮಿತಿ ಅಧ್ಯಕ್ಷ ಸೈಯದ್ ರಿಯಾಜ್, ಸದಸ್ಯರಾದ ಅನುಸುಧಾ ಮೋಹನ್ ಪಳನಿ,  ಶೃತಿ ವಸಂತ್, ಸರ್ವಮಂಗಳ ಭೈರಪ್ಪ, ಕೆ. ಸುದೀಪ್‌ಕುಮಾರ್, ಬಸವರಾಜ್ ಬಿ. ಆನೇಕೊಪ್ಪ, ಬಿ.ಎಂ ಮಂಜುನಾಥ್, ಮಂಜುಳ ಸುಬ್ಬಣ್ಣ, ಪರ್ವೀಜ್, ಐ.ವಿ ಸಂತೋಷ್‌ಕುಮಾರ್, ಅಧಿಕಾರಿಗಳಾದ ಶಿವಪ್ರಸಾದ್, ಗಿರಿಧರ್, ವಿವಿಧ ಶಾಲಾ ಕಾಲೇಜುಗಳ ಮುಖ್ಯಸ್ಥರು, ಎಸ್.ಡಿ.ಎಂ.ಸಿ ಸದಸ್ಯರು, ವಿದ್ಯಾರ್ಥಿಗಳು, ಪೋಷಕರು ಉಪಸ್ಥಿತರಿದ್ದರು.
    ಮಹಮ್ಮದ್ ಗೌಸ್ ಕಾರ್ಯಕ್ರಮ ನಿರೂಪಿಸಿ, ಸಮುದಾಯ ಸಂಘಟನಾಧಿಕಾರಿ ಎಂ.ಸುಹಾಸಿನಿ ಸ್ವಾಗತಿಸಿದರು.

ನ.೧೧ರಂದು ವಿದ್ಯುತ್ ವ್ಯತ್ಯಯ

    ಭದ್ರಾವತಿ : ಮೆಸ್ಕಾಂ ನಗರ ಉಪವಿಭಾಗಗಳ ಘಟಕ-೨ರ ಶಾಖಾ ವ್ಯಾಪ್ತಿಯ ವಿದ್ಯುತ್ ಮಾರ್ಗ ನಿರ್ವಹಣೆ ಕಾಮಗಾರಿ ಹಮ್ಮಿಕೊಂಡಿರುವುದರಿಂದ ನ.೧೧ರ ಮಂಗಳವಾರ ಬೆಳಿಗ್ಗೆ ೧೦ ಗಂಟೆಯಿಂದ ಸಂಜೆ ೬ ಗಂಟೆಯವರೆಗೆ ವಿದ್ಯುತ್ ವ್ಯತ್ಯಯ ಉಂಟಾಗಲಿದೆ. 
    ಕೆ.ಎಚ್.ಬಿ ಕಾಲೋನಿ, ಹೊಸಸೇತುವೆ ರಸ್ತೆ, ಕರ್ನಾಟಕ ರಸ್ತೆ ಸಾರಿಗೆ ನಿಗಮ ಘಟಕ ವ್ಯಾಪ್ತಿ, ಅಂಬೇಡ್ಕರ್ ನಗರ, ಹನುಮಂತಪ್ಪ ಕಾಲೋನಿ, ಹನುಮಂತನಗರ, ಸಂತೋಷ್ ಬಡಾವಣೆ ಸೇರಿದಂತೆ ಇತ್ಯಾದಿ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದೆ ಗ್ರಾಹಕರು ಸಹಕರಿಸುವಂತೆ ನಗರ ಉಪವಿಭಾಗದ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರು ಕೋರಿದ್ದಾರೆ. 

ಸರ್ವರಿಗೂ ಸಮಪಾಲು, ಸರ್ವರಿಗೂ ಸಮ ಬಾಳು ಕಾಂಗ್ರೆಸ್ ಧ್ಯೇಯ : ಧರ್ಮಕುಮಾರ್ 

ಜೆಡಿಎಸ್ ಗ್ರಾಮಾಂತರ ಅಧ್ಯಕ್ಷ ಸ್ಥಾನ ತೊರೆದು ಬೆಂಬಲಿಗರೊಂದಿಗೆ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆ 

ಭದ್ರಾವತಿ ತಾಲೂಕಿನ ಅತ್ತಿಗುಂದ ಗ್ರಾಮದ ಮುಖಂಡ, ಜೆಡಿಎಸ್ ಪಕ್ಷದ ಗ್ರಾಮಾಂತರ ಘಟಕದ ಅಧ್ಯಕ್ಷ ಧರ್ಮಕುಮಾರ್ ತಮ್ಮ ಬೆಂಬಲಿಗರೊಂದಿಗೆ ಕರ್ನಾಟಕ ಗ್ರಾಮೀಣ ಮೂಲ ಸೌಕರ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಶಾಸಕ ಬಿ.ಕೆ ಸಂಗಮೇಶ್ವರ್ ನೇತೃತ್ವದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಂಡರು. 
ಭದ್ರಾವತಿ:  ಕಾಂಗ್ರೆಸ್ ಪಕ್ಷ ತನ್ನದೇ ಆದ ಇತಿಹಾಸ, ಪರಂಪರೆ ಹೊಂದಿದೆ. ಸರ್ವರಿಗೂ ಸಮಪಾಲು, ಸರ್ವರಿಗೂ ಸಮ ಬಾಳು ಎಂಬ ಧ್ಯೇಯೋದ್ದೇಶ ಹೊಂದಿದೆ. ರಾಜ್ಯದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಲೋಕಕಲ್ಯಾಣಾರ್ಥವಾಗಿ ಪಂಚ ಗ್ಯಾರಂಟಿ ಯೋಜನೆಗಳನ್ನು ಜ್ಯಾತ್ಯಾತೀತವಾಗಿ ಅನುಷ್ಠಾನಗೊಳಿಸುವಲ್ಲಿ ಯಶಸ್ವಿಯಾಗಿದೆ. ಇದರೊಂದಿಗೆ ಆರ್ಥಿಕ ಸದೃಢತೆ, ಶಿಕ್ಷಣ ಕ್ಷೇತ್ರಕ್ಕೂ ಸಹ ಪ್ರಾಮುಖ್ಯತೆ ನೀಡಿ ಸರ್ವರಿಗೂ ಉತ್ತಮವಾದ ಜೀವನ ನಡೆಸಲು ಹಲವು ಯೋಜನೆಗಳನ್ನು ರೂಪಿಸಿದೆ ಎಂದು ತಾಲೂಕಿನ ಅತ್ತಿಗುಂದ ಗ್ರಾಮದ ಮುಖಂಡ, ಜೆಡಿಎಸ್ ಪಕ್ಷದ ಗ್ರಾಮಾಂತರ ಘಟಕದ ಅಧ್ಯಕ್ಷ ಧರ್ಮಕುಮಾರ್ ಬಣ್ಣಿಸಿದರು. 
    ಅವರು ತಮ್ಮ ಬೆಂಬಲಿಗರೊಂದಿಗೆ ಕರ್ನಾಟಕ ಗ್ರಾಮೀಣ ಮೂಲ ಸೌಕರ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಶಾಸಕ ಬಿ.ಕೆ ಸಂಗಮೇಶ್ವರ್ ನೇತೃತ್ವದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಂಡು ಮಾತನಾಡಿದರು. 
    ನಮ್ಮೂರು ಅತ್ತಿಗುಂದ ಗ್ರಾಮ ತಾಲೂಕಿನಲ್ಲಿ ವಿಶಿಷ್ಟವಾದ ಪರಂಪರೆ ಹೊಂದಿರುವ ದೊಡ್ಡ ಗ್ರಾಮವಾಗಿದೆ. ಈ ಗ್ರಾಮ ಬಹಳ ಇಂದಿನಿಂದಲೂ ಕಾಂಗ್ರೆಸ್ ಪಕ್ಷದ ಬೀಡಾಗಿದ್ದು, ಈ ಪಕ್ಷಕ್ಕೆ ಸೇರ್ಪಡೆಗೊಂಡಿರುವುದು ಹೆಮ್ಮೆಯ ವಿಚಾರವಾಗಿದೆ. ಮುಂದಿನ ದಿನಗಳಲ್ಲಿ ಕಾಂಗ್ರೆಸ್ ಪಕ್ಷವನ್ನು ಮತ್ತಷ್ಟು ಬಲಿಷ್ಠಗೊಳಿಸಲು ಶಕ್ತಿ ಮೀರಿ ಶ್ರಮಿಸುತ್ತೇನೆ ಎಂದರು. 
     ಕರ್ನಾಟಕ ಗ್ರಾಮೀಣ ಮೂಲ ಸೌಕರ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಶಾಸಕ ಬಿ.ಕೆ ಸಂಗಮೇಶ್ವರ್ ಮಾತನಾಡಿ, ಕ್ಷೇತ್ರದಲ್ಲಿ ೪ ಬಾರಿ ಶಾಸಕರಾಗಿ ಆಯ್ಕೆಯಾಗಲು ಅತ್ತಿಗುಂದ ಗ್ರಾಮಸ್ಥರ ಸಹಕಾರ ಹೆಚ್ಚಿನದ್ದಾಗಿದೆ. ಕಾಂಗ್ರೆಸ್ ಪಕ್ಷವನ್ನು ಇಂದಿಗೂ ಬೆಂಬಲಿಸಿಕೊಂಡು ಬರುತ್ತಿದ್ದಾರೆ. ಗ್ರಾಮಸ್ಥರ ಋಣ ಎಂದಿಗೂ ತೀರಿಸಲು ಸಾಧ್ಯವಿಲ್ಲ. ನನ್ನನ್ನು ಬೆಂಬಲಿಸಿದಂತೆ ಮುಂದಿನ ಚುನಾವಣೆಯಲ್ಲಿ ತಮ್ಮ ಪುತ್ರ ಬಿ.ಎಸ್ ಗಣೇಶ್‌ರವರನ್ನು ಸಹ ಬೆಂಬಲಿಸಬೇಕೆಂದು ಮನವಿ ಮಾಡಿ, ಇದೀಗ ಗ್ರಾಮದ ಮುಖಂಡರು, ವಿದ್ಯಾವಂತರು, ಬುದ್ದಿವಂತರಾದ ಧರ್ಮಕುಮಾರ್‌ರವರು ಜೆಡಿಎಸ್ ಪಕ್ಷ ತೊರೆದು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಂಡಿರುವುದು ಸಂತಸ ತಂದಿದೆ ಎಂದರು. 
    ಬ್ಲಾಕ್ ಕಾಂಗ್ರೆಸ್ ನಗರ ಘಟಕದ ಅಧ್ಯಕ್ಷ ಎಸ್. ಕುಮಾರ್,  ಗ್ರಾಮಾಂತರ ಅಧ್ಯಕ್ಷ ಎಚ್.ಎಲ್ ಷಡಕ್ಷರಿ, ಸರ್ಕಾರದ ಪಂಚ ಗ್ಯಾರೆಂಟಿ ಯೋಜನೆಗಳ ಅನುಷ್ಠಾನ ಸಮಿತಿ ತಾಲೂಕು ಅಧ್ಯಕ್ಷ ಬಿ.ಎಸ್ ಗಣೇಶ್, ಪಿಎಲ್‌ಡಿ ಬ್ಯಾಂಕ್ ಅಧ್ಯಕ್ಷ ಡಿಸಿಸಿ ಬ್ಯಾಂಕ್ ಬಿ.ಕೆ ಶಿವಕುಮಾರ್, ಉದ್ಯಮಿ ಬಿ.ಕೆ ಜಗನ್ನಾಥ್, ನಗರಸಭೆ ಸ್ಟಾಯಿ ಸಮಿತಿ ಅಧ್ಯಕ್ಷ ರಿಯಾಜ್ ಅಹಮದ್ ಸದಸ್ಯರಾದ ಬಿ.ಎಂ ಮಂಜುನಾಥ್, ಬಸವರಾಜ ಬಿ. ಆನೆಕೊಪ್ಪ, ಮೆಸ್ಕಾಂ ಸಲಹಾ ಸಮಿತಿ ತಾಲೂಕು ಅಧ್ಯಕ್ಷ ಬಸವಂತಪ್ಪ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.