ಗುರುವಾರ, ನವೆಂಬರ್ 13, 2025

ಓಸಿ ಮಟ್ಕಾ ಜೂಜಾಟ : ಪ್ರಕರಣ ದಾಖಲು


    ಭದ್ರಾವತಿ : ನಗರದ ನ್ಯೂಟೌನ್ ಮಹಾತ್ಮಗಾಂಧಿ ಉದ್ಯಾನವನದ ಸಮೀಪ ಸಾರ್ವಜನಿಕ ಸ್ಥಳದಲ್ಲಿ ಓಸಿ ಮಟ್ಕಾ ಜೂಜಾಟದಲ್ಲಿ ತೊಡಗಿದ್ದ ಯುವಕನನ್ನು ವಶಕ್ಕೆ ಪಡೆದು ನ್ಯಾಯಾಲಯಕ್ಕೆ ಹಾಜರುಪಡಿಸಿ ಪ್ರಕರಣ ದಾಖಲಿಸಿಕೊಂಡಿರುವ ಘಟನೆ ನಡೆದಿದೆ. 
    ಗಸ್ತು ಕರ್ತವ್ಯದಲ್ಲಿದ್ದ ನ್ಯೂಟೌನ್ ಪೊಲೀಸ್ ಠಾಣೆಯ ಸಿಬ್ಬಂದಿ ಗುಳ್ಯಪ್ಪರವರು ಖಚಿತ ಮಾಹಿತಿ ಮೇರೆಗೆ ನ.೧೧ರ ಸಂಜೆ ೭.೪೫ರ ಸಮಯದಲ್ಲಿ ದಾಳಿ ನಡೆಸಿ ಓಸಿ ಮಟ್ಕಾ ಜೂಜಾಟದಲ್ಲಿ ತೊಡಗಿದ್ದ ಜನ್ನಾಪುರ ಲಿಂಗಾಯಿತರ ಬೀದಿ ನಿವಾಸಿಯಾಗಿರುವ ಯುವಕನನ್ನು ವಶಕ್ಕೆ ಪಡೆದಿದ್ದಾರೆ. ನ್ಯಾಯಾಲಯದ ಆದೇಶದ ಮೇರೆಗೆ ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಳ್ಳಲಾಗಿದೆ. 

ವಿದ್ಯಾರ್ಥಿಗಳು ದುಶ್ಚಟಗಳಿಗೆ ಬಲಿಯಾಗದೆ ಭವಿಷ್ಯ ರೂಪಿಸಿಕೊಳ್ಳಿ : ತಮಟೆ ಜಗದೀಶ್

ಭದ್ರಾವತಿಯಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್-೨ ಯೋಜನಾ ಕಛೇರಿಯಿಂದ ನಗರಸಭೆ ವ್ಯಾಪ್ತಿಯ ಭದ್ರಾ ಕಾಲೋನಿಯಲ್ಲಿರುವ ಭದ್ರಾ ಪ್ರೌಢ ಶಾಲೆಯಲ್ಲಿ  ಸ್ವಾಸ್ಥ್ಯ ಸಂಕಲ್ಪ ಅರಿವು ಕಾರ್ಯಕ್ರಮ ಆಯೋಜಿಸಲಾಗಿತ್ತು. 
    ಭದ್ರಾವತಿ: ವಿದ್ಯಾರ್ಥಿಗಳು ದುಶ್ಚಟಗಳಿಗೆ ಬಲಿಯಾಗದೆ ಭವಿಷ್ಯ ರೂಪಿಸಿಕೊಳ್ಳಬೇಕು. ಆಗ ಮಾತ್ರ ಸ್ವಾಸ್ಥ್ಯ ಸಮಾಜ ನಿರ್ಮಾಣಗೊಳ್ಳಲು ಸಾಧ್ಯ ಎಂದು ಜನಪದ ಕಲಾವಿದ ತಮಟೆ ಜಗದೀಶ್ ಹೇಳಿದರು. 
    ಅವರು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್-೨ ಯೋಜನಾ ಕಛೇರಿಯಿಂದ ನಗರಸಭೆ ವ್ಯಾಪ್ತಿಯ ಭದ್ರಾ ಕಾಲೋನಿಯಲ್ಲಿರುವ ಭದ್ರಾ ಪ್ರೌಢ ಶಾಲೆಯಲ್ಲಿ ಆಯೋಜಿಸಲಾಗಿದ್ದ ಸ್ವಾಸ್ಥ್ಯ ಸಂಕಲ್ಪ ಅರಿವು ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಪಾಲ್ಗೊಂಡು ಮಾತನಾಡಿದರು. 
    ಜಾಗೃತಿ ಗೀತೆಗಳ ಮೂಲಕ ಸ್ವಾಸ್ಥ್ಯ ಸಮಾಜದ ನಿರ್ಮಾಣದಲ್ಲಿ ವಿದ್ಯಾರ್ಥಿಗಳ ಪಾತ್ರ, ದುಶ್ಚಟಗಳಿಗೆ ಬಲಿಯಾಗದೆ ಸಮಾಜದಲ್ಲಿ ಬದುಕುವ ರೀತಿ, ದುಶ್ಚಟಗಳಿಂದ ಉಂಟಾಗುವ ದುಷ್ಪರಿಣಾಮಗಳ ಬಗ್ಗೆ ಮಾಹಿತಿ ನೀಡಿದರು. .
    ಶಾಲೆಯ ಮುಖ್ಯೋಪಾಧ್ಯಾಯ ಶೀವ್ಯಾನಾಯ್ಕ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ನಾಗತಿಬೆಳಗಲು ವಲಯದ ಮೇಲ್ವಿಚಾರಕಿ ಎಸ್. ದೀಪಿಕಾ, ಸೇವಾಪ್ರತಿನಿಧಿ ರಾಧಾ ಮತ್ತು ಒಕ್ಕೂಟದ ಪದಾಧಿಕಾರಿ ಪವಿತ್ರ, ಶಾಲಾ ಶಿಕ್ಷಕವೃಂದ ಮತ್ತು ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.  

ಕನಕ ವಿದ್ಯಾಸಂಸ್ಥೆ ವಿದ್ಯಾರ್ಥಿಗಳಿಗೆ ವಿವಿಧ ಕ್ರೀಡೆಗಳಲ್ಲಿ ಬಹುಮಾನ

ಭದ್ರಾವತಿ ಹಳೇನಗರದ ತಾಲೂಕು ಕುರುಬರ ಸಂಘ ಆಶ್ರಿತದ ಶ್ರೀ ಕನಕ ವಿದ್ಯಾಸಂಸ್ಥೆ ವಿದ್ಯಾರ್ಥಿಗಳು ವಿವಿಧ ಕ್ರೀಡೆಗಳಲ್ಲಿ ಭಾಗವಹಿಸಿ ಪ್ರಶಸ್ತಿಗಳನ್ನು ತಮ್ಮದಾಗಿಸಿಕೊಂಡಿದ್ದಾರೆ. 
    ಭದ್ರಾವತಿ: ಹಳೇನಗರದ ತಾಲೂಕು ಕುರುಬರ ಸಂಘ ಆಶ್ರಿತದ ಶ್ರೀ ಕನಕ ವಿದ್ಯಾಸಂಸ್ಥೆ ವಿದ್ಯಾರ್ಥಿಗಳು ವಿವಿಧ ಕ್ರೀಡೆಗಳಲ್ಲಿ ಭಾಗವಹಿಸಿ ಪ್ರಶಸ್ತಿಗಳನ್ನು ತಮ್ಮದಾಗಿಸಿಕೊಂಡಿದ್ದಾರೆ. 
    ನ್ಯೂಟೌನ್ ವಿಐಎಸ್‌ಎಲ್ ಕ್ರೀಡಾಂಗಣದಲ್ಲಿ ಆಯೋಜಿಸಲಾಗಿದ್ದ ತಾಲೂಕು ಮಟ್ಟದ ಕ್ರೀಡಾಕೂಟದಲ್ಲಿ ವಿದ್ಯಾರ್ಥಿಗಳಾದ ಅರ್ಫಾನ್ ತಹೀಮ್ ೧೦೦, ೨೦೦ ಮತ್ತು ೧೧೦ ಮೀಟರ್ ಹರ್ಡಲ್ಸ್‌ನಲ್ಲಿ ದ್ವಿತೀಯ ಸ್ಥಾನ, ನವನೀತ್ ನಡಿಗೆಯಲ್ಲಿ ಪ್ರಥಮ ಸ್ಥಾನ ಮತ್ತು ಖುಷಿ ದ್ವಿತೀಯ ಸ್ಥಾನ ಹಾಗು ಬೆಂಗಳೂರಿನಲ್ಲಿ ಆಯೋಜಿಸಲಾಗಿದ್ದ ಮಿನಿ ಓಲಂಪಿಕ್ಸ್‌ನಲ್ಲಿ ವಿ. ವಿಕ್ರಮ್ ಸಿಂಧೆ ಭಾರ ಎತ್ತುವ ಸ್ಪರ್ಧೆಯ ೪೦ ಕೆ.ಜಿ ವಿಭಾಗದಲ್ಲಿ ಪ್ರಥಮ ಸ್ಥಾನದೊಂದಿಗೆ ಪ್ರಶಸ್ತಿ ತಮ್ಮದಾಗಿಸಿಕೊಂಡಿದ್ದಾರೆ. 
    ಉತ್ತಮ ಸಾಧನೆಯೊಂದಿಗೆ ಪ್ರಶಸ್ತಿಗಳನ್ನು ಪಡೆದು ಕೀರ್ತಿ ತಂದಿರುವ ವಿದ್ಯಾರ್ಥಿಗಳಿಗೆ ತಾಲೂಕು ಕುರುಬರ ಸಂಘ, ಕನಕ ವಿದ್ಯಾಸಂಸ್ಥೆ ಆಡಳಿತ ಮಂಡಳಿ, ಶಿಕ್ಷಕ ಹಾಗು ಸಿಬ್ಬಂದಿ ವರ್ಗದವರು ಅಭಿನಂದಿಸಿದ್ದಾರೆ.   

ಯಶಸ್ವಿ ೬೧ನೇ ರಕ್ತದಾನ ಶಿಬಿರ : ೩೫ ಯೂನಿಟ್ ರಕ್ತ ಸಂಗ್ರಹ

ಭದ್ರಾವತಿಯಲ್ಲಿ ಹಳೇನಗರ ಹಾಗು ಹೊಸಮನೆ ಶಿವಾಜಿ ಸರ್ಕಲ್ ಪೊಲೀಸ್ ಠಾಣೆ ವತಿಯಿಂದ ಶಿವಮೊಗ್ಗ ಆಶಾಜ್ಯೋತಿ ಸ್ವಯಂ ಪ್ರೇರಿತ ರಕ್ತ ಕೇಂದ್ರದ ಸಹಯೋಗದೊಂದಿಗೆ ಆಯೋಜಿಸಲಾಗಿದ್ದ ಶಿವಮೊಗ್ಗ ಜಿಲ್ಲಾ ಪೊಲೀಸ್ ೬೧ನೇ ರಕ್ತದಾನ ಶಿಬಿರ ಯಶಸ್ವಿಯಾಗಿ ನೆರವೇರಿತು. 
    ಭದ್ರಾವತಿ: ಕೆಲವು ವರ್ಷಗಳಿಂದ ಜಿಲ್ಲೆಯಾದ್ಯಂತ ರಕ್ತದಾನ ಶಿಬಿರ ಆಯೋಜಿಸುವ ಮೂಲಕ ರಕ್ತದಾನ ಕುರಿತು ಜಾಗೃತಿ ಮೂಡಿಸಲಾಗುತ್ತಿದೆ. ಇದಕ್ಕೆ ಪೂರಕವಾಗಿ ನಗರದಲ್ಲಿ ಸಂಚಾರಿ ಪೊಲೀಸ್ ಠಾಣೆ ಸಿಬ್ಬಂದಿ, ರಕ್ತದಾನಿ ಹಾಲೇಶಪ್ಪ ನೇತೃತ್ವದಲ್ಲಿ ರಕ್ತದಾನ ಶಿಬಿರಗಳನ್ನು ಯಶಸ್ವಿಯಾಗಿ ನಡೆಸಿಕೊಂಡು ಬರಲಾಗುತ್ತಿದೆ. 
    ಹಳೇನಗರ ಹಾಗು ಹೊಸಮನೆ ಶಿವಾಜಿ ಸರ್ಕಲ್ ಪೊಲೀಸ್ ಠಾಣೆ ವತಿಯಿಂದ ಶಿವಮೊಗ್ಗ ಆಶಾಜ್ಯೋತಿ ಸ್ವಯಂ ಪ್ರೇರಿತ ರಕ್ತ ಕೇಂದ್ರದ ಸಹಯೋಗದೊಂದಿಗೆ ಆಯೋಜಿಸಲಾಗಿದ್ದ ಶಿವಮೊಗ್ಗ ಜಿಲ್ಲಾ ಪೊಲೀಸ್ ೬೧ನೇ ರಕ್ತದಾನ ಶಿಬಿರ ಯಶಸ್ವಿಯಾಗಿ ನೆರವೇರಿತು. 
    ಹಳೇನಗರ ಹಾಗು ಹೊಸಮನೆ ಶಿವಾಜಿ ಸರ್ಕಲ್ ಪೊಲೀಸ್ ಠಾಣೆ ಸಿಬ್ಬಂದಿಗಳು ಹಾಗು ಸ್ಥಳೀಯ ನಿವಾಸಿಗಳು ಶಿಬಿರದಲ್ಲಿ ಪಾಲ್ಗೊಂಡು ರಕ್ತದಾನ ಮಾಡಿದರು. ಒಟ್ಟು ೩೫ ಯೂನಿಟ್ ರಕ್ತ ಸಂಗ್ರಹಿಸಲಾಯಿತು. ಶಿಬಿರ ಯಶಸ್ವಿಗೊಳ್ಳಲು ಸಹಕರಿಸಿದ ಪ್ರತಿಯೊಬ್ಬರಿಗೂ ಹಾಲೇಶಪ್ಪ ಕೃತಜ್ಞತೆ ಸಲ್ಲಿಸಿದ್ದಾರೆ.