ಫೆ.೧೬ರಂದು ಬಿಇಓ ಕಛೇರಿ ಮುಂಭಾಗ ಧರಣಿ ಸತ್ಯಾಗ್ರಹ


    ಭದ್ರಾವತಿ : ಹಳೇನಗರದ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ ಸಮೀಪದ ಹಲವಾರು ವರ್ಷಗಳಿಂದ ಕಸದ ಕೊಂಪೆಯಂತಿರುವ ಖಾಲಿ ಜಾಗದಲ್ಲಿ ಸರ್ಕಾರಿ ಪ್ರಾಥಮಿಕ ಶಾಲಾ ಮಕ್ಕಳಿಗೆ ಉದ್ಯಾನವನ ನಿರ್ಮಿಸುವಂತೆ ಆಗ್ರಹಿಸಿ ಫೆ.೧೬ರಂದು ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ ಮುಂಭಾಗ ಮಾನವ ಹಕ್ಕುಗಳ ಹೋರಾಟ ಸಮಿತಿಯಿಂದ ಪ್ರತಿಭಟನಾ ಧರಣಿ ಸತ್ಯಾಗ್ರಹ ಹಮ್ಮಿಕೊಳ್ಳಲಾಗಿದೆ. 
    ಡಾ. ಬಿ.ಆರ್ ಅಂಬೇಡ್ಕರ್ ಭವನದ ಆವರಣದ ಪಕ್ಕದಲ್ಲಿ ಸರ್ಕಾರಿ ಪ್ರಾಥಮಿಕ ಶಾಲೆಯ ಹಿಂಭಾಗ ಬಸವೇಶ್ವರ ವೃತ್ತಕ್ಕೆ ಸಂಪರ್ಕಗೊಂಡಿರುವ ಮುಖ್ಯ ರಸ್ತೆಯಲ್ಲಿ ಹಲವಾರು ವರ್ಷಗಳಿಂದ ಖಾಲಿ ಜಾಗವಿದ್ದು, ಈ ಜಾಗದಲ್ಲಿ ಗಿಡಗಂಟಿಗಳು ಬೆಳೆದಿವೆ. ಕಸಕಡ್ಡಿ, ತ್ಯಾಜದಿಂದ ಕೂಡಿರುವ ಜಾಗ ಸ್ಮಶಾನದಂತೆ ಗೋಚರಿಸುತ್ತಿದೆ. ಈ ಜಾಗವನ್ನು ಖಾಸಗಿ ವ್ಯಕ್ತಿಗಳು ಕಬಳಿಸಲು ಹುನ್ನಾರ ನಡೆಸುತ್ತಿದ್ದು, ಇದನ್ನು ಸಮಿತಿ ಖಂಡಿಸುತ್ತದೆ. ಯಾವುದೇ ಕಾರಣಕ್ಕೂ ಖಾಸಗಿ ವ್ಯಕ್ತಿಗಳಿಗೆ ಖಾಲಿ ಜಾಗ ನೀಡಬಾರದು. ಈ ಜಾಗದಲ್ಲಿ ಮಕ್ಕಳಿಗೆ ಉದ್ಯಾನವನ ನಿರ್ಮಿಸಬೇಕೆಂದು ಆಗ್ರಹಿಸಿ ಹೋರಾಟ ನಡೆಸಲಾಗುತ್ತಿದೆ. 
    ಫೆ.೧೬ರ ಬೆಳಿಗ್ಗೆ ೧೧ ಗಂಟೆಗೆ  ಸತ್ಯಾಗ್ರಹ ನಡೆಯಲಿದ್ದು, ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಯಶಸ್ವಿಗೊಳಿಸುವಂತೆ ಸಮಿತಿ ಅಧ್ಯಕ್ಷ ಬಿ.ಎನ್ ರಾಜು ಕೋರಿದ್ದಾರೆ.