ಖಾಲಿ ಜಾಗ ಸರ್ಕಾರಿ ಶಾಲೆ ಅಭಿವೃದ್ಧಿಗೆ ಬಳಸಿಕೊಳ್ಳಿ, ಮಕ್ಕಳ ಸುರಕ್ಷತೆಗೆ ಗಮನ ಹರಿಸಿ
ಮಾನವ ಹಕ್ಕುಗಳ ಹೋರಾಟ ಸಮಿತಿಯಿಂದ ಧರಣಿ ಸತ್ಯಾಗ್ರಹ : ಮನವಿ
ಭದ್ರಾವತಿ ಹಳೇನಗರದ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ ಪಕ್ಕದಲ್ಲಿ ಹಲವಾರು ವರ್ಷಗಳಿಂದ ಕಸದ ಕೊಂಪೆಯಂತಿರುವ ಖಾಲಿ ಜಾಗವನ್ನು ಸರ್ಕಾರಿ ಶಾಲೆಯ ಅಭಿವೃದ್ಧಿ ಕಾರ್ಯಗಳಿಗೆ ಮಾತ್ರ ಬಳಸಿಕೊಳ್ಳಬೇಕು. ಯಾವುದೇ ಕಾರಣಕ್ಕೂ ಖಾಸಗಿ ವ್ಯಕ್ತಿಗಳು ಕಬಳಿಸಲು ಅವಕಾಶ ನೀಡಬಾರದು ಹಾಗು ಸರ್ಕಾರಿ ಪ್ರಾಥಮಿಕ ಶಾಲೆಯ ಮಕ್ಕಳ ಸುರಕ್ಷತೆಗೆ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ಸೋಮವಾರ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ ಮುಂಭಾಗ ಮಾನವ ಹಕ್ಕುಗಳ ಹೋರಾಟ ಸಮಿತಿಯಿಂದ ಪ್ರತಿಭಟನಾ ಧರಣಿ ಸತ್ಯಾಗ್ರಹ ಕೈಗೊಳ್ಳುವ ಮೂಲಕ ಮನವಿ ಸಲ್ಲಿಸಲಾಯಿತು.
ಭದ್ರಾವತಿ : ಹಳೇನಗರದ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ ಪಕ್ಕದಲ್ಲಿ ಹಲವಾರು ವರ್ಷಗಳಿಂದ ಕಸದ ಕೊಂಪೆಯಂತಿರುವ ಖಾಲಿ ಜಾಗವನ್ನು ಸರ್ಕಾರಿ ಶಾಲೆಯ ಅಭಿವೃದ್ಧಿ ಕಾರ್ಯಗಳಿಗೆ ಮಾತ್ರ ಬಳಸಿಕೊಳ್ಳಬೇಕು. ಯಾವುದೇ ಕಾರಣಕ್ಕೂ ಖಾಸಗಿ ವ್ಯಕ್ತಿಗಳು ಕಬಳಿಸಲು ಅವಕಾಶ ನೀಡಬಾರದು ಹಾಗು ಸರ್ಕಾರಿ ಪ್ರಾಥಮಿಕ ಶಾಲೆಯ ಮಕ್ಕಳ ಸುರಕ್ಷತೆಗೆ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ಸೋಮವಾರ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ ಮುಂಭಾಗ ಮಾನವ ಹಕ್ಕುಗಳ ಹೋರಾಟ ಸಮಿತಿಯಿಂದ ಪ್ರತಿಭಟನಾ ಧರಣಿ ಸತ್ಯಾಗ್ರಹ ಕೈಗೊಳ್ಳುವ ಮೂಲಕ ಮನವಿ ಸಲ್ಲಿಸಲಾಯಿತು.
ಧರಣಿ ಸತ್ಯಾಗ್ರಹ ನಿರತರು ಮಾತನಾಡಿ, ಡಾ. ಬಿ.ಆರ್ ಅಂಬೇಡ್ಕರ್ ಭವನದ ಆವರಣದ ಪಕ್ಕದಲ್ಲಿ ಸರ್ಕಾರಿ ಪ್ರಾಥಮಿಕ ಶಾಲೆಯ ಹಿಂಭಾಗ ಬಸವೇಶ್ವರ ವೃತ್ತಕ್ಕೆ ಸಂಪರ್ಕಗೊಂಡಿರುವ ಮುಖ್ಯ ರಸ್ತೆಯಲ್ಲಿ ಹಲವಾರು ವರ್ಷಗಳಿಂದ ಖಾಲಿ ಜಾಗವಿದ್ದು, ಈ ಜಾಗದಲ್ಲಿ ಗಿಡಗಂಟಿಗಳು ಬೆಳೆದಿವೆ. ಕಸಕಡ್ಡಿ, ತ್ಯಾಜದಿಂದ ಕೂಡಿರುವ ಜಾಗ ಸ್ಮಶಾನದಂತೆ ಗೋಚರಿಸುತ್ತಿದೆ. ಈ ಜಾಗವನ್ನು ಖಾಸಗಿ ವ್ಯಕ್ತಿಗಳು ಕಬಳಿಸಲು ಹುನ್ನಾರ ನಡೆಸುತ್ತಿದ್ದು, ಇದನ್ನು ಸಮಿತಿ ಖಂಡಿಸುತ್ತದೆ. ಯಾವುದೇ ಕಾರಣಕ್ಕೂ ಖಾಸಗಿ ವ್ಯಕ್ತಿಗಳಿಗೆ ಖಾಲಿ ಜಾಗ ನೀಡಬಾರದು. ಈ ಜಾಗದಲ್ಲಿ ಸ್ವಚ್ಛತಾ ಕಾರ್ಯ ಕೈಗೊಂಡು ಕಾಂಪೌಂಡ್ ನಿರ್ಮಿಸಿ ಕೈತೋಟ, ಉದ್ಯಾನವನ ಕಲ್ಪಿಸಿಕೊಟ್ಟಲ್ಲಿ ಬಡ ಮಕ್ಕಳಿಗೆ ಹೆಚ್ಚಿನ ನೆರವಾಗಲಿದೆ. ಈ ಕುರಿತು ಹಲವಾರು ಬಾರಿ ಸಂಬಂಧಪಟ್ಟವರಿಗೆ ತಿಳಿಸಿದ್ದರೂ ಸಹ ಯಾವುದೇ ಕ್ರಮ ಕೈಗೊಂಡಿಲ್ಲ. ಈ ಜಾಗವನ್ನು ಸರ್ಕಾರಿ ಶಾಲೆಯ ಅಭಿವೃದ್ಧಿ ಕಾರ್ಯಗಳಿಗೆ ಮಾತ್ರ ಬಳಸಿಕೊಳ್ಳಬೇಕು. ಒಂದು ವೇಳೆ ಖಾಸಗಿ ವ್ಯಕ್ತಿಗಳಿಗೆ ವರ್ಗಾವಣೆ ಮಾಡಿಕೊಟ್ಟಲ್ಲಿ ಉಗ್ರ ಹೋರಾಟ ನಡೆಸಬೇಕಾಗುತ್ತದೆ ಎಂದು ಎಚ್ಚರಿಸಿದರು.
ಡಾ. ಬಿ.ಆರ್ ಅಂಬೇಡ್ಕರ್ ಭವನದ ಆವರಣದ ಪಕ್ಕದಲ್ಲಿರುವ ಸರ್ಕಾರಿ ಪ್ರಾಥಮಿಕ ಶಾಲೆಯ ಕಟ್ಟಡದ ಮೇಲ್ಭಾಗದಲ್ಲಿ ಯಾವುದೇ ರೀತಿ ಸುರಕ್ಷತೆ ಇಲ್ಲದಂತೆ ಮಕ್ಕಳಿಗೆ ತರಗತಿಗಳನ್ನು ನಡೆಸಲಾಗುತ್ತಿದೆ. ಮಕ್ಕಳ ಜೀವದ ಜೊತೆ ಚೆಲ್ಲಾಟವಾಡಲಾಗುತ್ತಿದೆ. ಈ ಹಿನ್ನಲೆಯಲ್ಲಿ ತಕ್ಷಣ ಗಮನ ಹರಿಸಿ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿದರು.
ಕ್ಷೇತ್ರ ಶಿಕ್ಷಣಾಧಿಕಾರಿ ಎ.ಕೆ ನಾಗೇಂದ್ರಪ್ಪ ಹಾಗು ನಗರಸಭೆ ಪೌರಾಯುಕ್ತ ಎನ್.ಕೆ ಹೇಮಂತ್ ಅವರಿಗೆ ಮನವಿ ಸಲ್ಲಿಸಲಾಯಿತು. ಮಾನವ ಹಕ್ಕುಗಳ ಹೋರಾಟ ಸಮಿತಿ ಅಧ್ಯಕ್ಷ ಬಿ.ಎನ್ ರಾಜು ನೇತೃತ್ವವಹಿಸಿದ್ದರು. ಪ್ರಮುಖರಾದ ಕಾರ್ಮಿಕ ಮುಖಂಡ ದೊರೈ, ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷದ ತೀರ್ಥೇಶ್, ರೈತ ಮುಖಂಡ ಶಂಕರ್ ರಾವ್, ಡಿಸಿಎಂ ರಾಜ್ಯಾಧ್ಯಕ್ಷ ಪ್ರಮೋದ್ ಕುಮಾರ್, ಯುನೈಟೆಡ್ ಕ್ರಿಶ್ಚಿಯನ್ ಅಸೋಸಿಯೇಷನ್ ಅಧ್ಯಕ್ಷ ಸೆಲ್ವರಾಜ್, ಪ್ರಮುಖರಾದ ಬ್ರಹ್ಮಲಿಂಗಯ್ಯ ,ಸೋಮಣ್ಣ, ಚಂದ್ರಶೇಖರ್, ಏಕಾಂತ, ವಿ. ಈರೇಶ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.