ಕಾರ್ಯಾಚರಣೆಯಲ್ಲಿ ತೊಡಗಿದ್ದ ಇಬ್ಬರು ಠಾಣಾಧಿಕಾರಿಗಳಿಗೆ ಗಾಯ : ಪ್ರಕರಣ ದಾಖಲು
ಭದ್ರಾವತಿ : ದರೋಡೆಗೆ ಯತ್ನಿಸುತ್ತಿದ್ದ ವೇಳೆ ಕಾರ್ಯಾಚರಣೆಯಲ್ಲಿ ತೊಡಗಿದ್ದ ಪೇಪರ್‌ಟೌನ್ ಪೊಲೀಸ್ ಠಾಣೆ ಉಪ ನಿರೀಕ್ಷಕ ಕೃಷ್ಣಕುಮಾರ್ ಮಾನೆ ಮತ್ತು ಹೊಸಮನೆ ಶಿವಾಜಿ ಸರ್ಕಲ್ ಪೊಲೀಸ್ ಠಾಣೆ ಉಪ ನಿರೀಕ್ಷಕ ಎಂ.ಪಿ ಸಿದ್ದಪ್ಪ ಗಾಯಗೊಂಡಿದ್ದು, ತಾಲೂಕು ಸಾರ್ವಜನಿಕ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದೆ.
ಹಲವು ದರೋಡೆ ಪ್ರಕರಣಗಳಲ್ಲಿ ಭಾಗಿಯಾಗಿರುವ ಹಾಗು ಪ್ರಕರಣವೊಂದರಲ್ಲಿ ಜೈಲು ಶಿಕ್ಷೆ ಅನುಭವಿಸಿ ಬಿಡುಗಡೆಗೊಂಡಿದ್ದ ಡಿಚ್ಚಿ ಮುಬಾರಕ್ ಶನಿವಾರ ದರೋಡೆಗೆ ಯತ್ನಿಸುತ್ತಿದ್ದಾಗ ಕಾರ್ಯಾಚರಣೆ ತೊಡಗಿದ್ದ ಕೃಷ್ಣಕುಮಾರ್ ಮಾನೆ ಮತ್ತು ಎಂ.ಪಿ ಸಿದ್ದಪ್ಪ ಗಾಯಗೊಂಡಿದ್ದರು. ಈ ನಡುವೆ ಡಿಚ್ಚಿ ಮುಬಾರಕ್ ಕಾಲಿಗೆ ಗುಂಡು ಹಾರಿಸಿ ಆತನನ್ನು ಬಂಧಿಸಲಾಗಿತ್ತು.
ತಾಲೂಕು ಸಾರ್ವಜನಿಕ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಕೃಷ್ಣಕುಮಾರ್ ಮಾನೆ ಮತ್ತು ಎಂ.ಪಿ ಸಿದ್ದಪ್ಪ ಚೇತರಿಸಿಕೊಂಡಿದ್ದು, ಆಸ್ಪತ್ರೆಯಿಂದ ಬಿಡುಗಡೆಗೊಳಿಸಲಾಗಿದೆ. ಈ ಘಟನೆಗೆ ಸಂಬಂಧಿಸಿದಂತೆ ಪ್ರತ್ಯೇಕವಾಗಿ ಎರಡು ಪ್ರಕರಣಗಳನ್ನು ದಾಖಲಿಸಿಕೊಳ್ಳಲಾಗಿದೆ.