೮೯ನೇ ರಕ್ತದಾನ ಶಿಬಿರ : ೩೦ ಮಂದಿ ರಕ್ತದಾನ
ಶಿವಮೊಗ್ಗ ಜಿಲ್ಲಾ ಪೊಲೀಸ್ ಹಾಗು ಭದ್ರಾವತಿ ನಗರದ ಕ್ಷಿಪ್ರ ಕಾರ್ಯ ಪಡೆ(ಆರ್‌ಎಎಫ್) ಬಿ.ಎನ್-೯೭ರ ವತಿಯಿಂದ ಜೀವ ಸಂಜೀವಿನ ರಕ್ತ ಕೇಂದ್ರದ ಸಹಯೋಗದೊಂದಿಗೆ ಶನಿವಾರ ಹಮ್ಮಿಕೊಳ್ಳಲಾಗಿದ್ದ ೮೯ನೇ ರಕ್ತದಾನ ಶಿಬಿರದಲ್ಲಿ ಒಟ್ಟು ೩೦ ಮಂದಿ ಸ್ವಯಂ ಪ್ರೇರಣೆಯಿಂದ ರಕ್ತದಾನ ಮಾಡಿದರು.
ಭದ್ರಾವತಿ : ಶಿವಮೊಗ್ಗ ಜಿಲ್ಲಾ ಪೊಲೀಸ್ ಹಾಗು ನಗರದ ಕ್ಷಿಪ್ರ ಕಾರ್ಯ ಪಡೆ(ಆರ್‌ಎಎಫ್) ಬಿ.ಎನ್-೯೭ರ ವತಿಯಿಂದ ಜೀವ ಸಂಜೀವಿನ ರಕ್ತ ಕೇಂದ್ರದ ಸಹಯೋಗದೊಂದಿಗೆ ಶನಿವಾರ ಹಮ್ಮಿಕೊಳ್ಳಲಾಗಿದ್ದ ೮೯ನೇ ರಕ್ತದಾನ ಶಿಬಿರದಲ್ಲಿ ಒಟ್ಟು ೩೦ ಮಂದಿ ಸ್ವಯಂ ಪ್ರೇರಣೆಯಿಂದ ರಕ್ತದಾನ ಮಾಡಿದರು.
ಮೈಸೂರು ಕಾಗದ ಕಾರ್ಖಾನೆಯ ಆರ್‌ಎಎಫ್ ಆವರಣದಲ್ಲಿ ೮೭ನೇ ಸಿಆರ್‌ಪಿಎಫ್ ದಿನಾಚರಣೆ ಅಂಗವಾಗಿ ಆಯೋಜಿಸಲಾಗಿದ್ದ ಶಿಬಿರದಲ್ಲಿ ಆರ್‌ಎಎಫ್ ಅಧಿಕಾರಿಗಳು ಮತ್ತು ಸಿಬ್ಬಂದಿ ವರ್ಗದವರು ರಕ್ತದಾನ ನೆರವೇರಿಸಿದರು. ಶಿವಮೊಗ್ಗ ಜಿಲ್ಲಾ ಪೊಲೀಸ್ ವತಿಯಿಂದ ನಿರಂತರವಾಗಿ ರಕ್ತದಾನ ಶಿಬಿರ ಆಯೋಜಿಸುವ ಮೂಲಕ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಿ ತುರ್ತು ಸಂದರ್ಭಗಳಿಗೆ ನೆರವಾಗುತ್ತಿರುವುದು ಉತ್ತಮ ಬೆಳವಣಿಗೆಯಾಗಿದೆ.
ರಕ್ತದಾನ ಹಾಗು ಪರಿಸರ ಪ್ರೇಮಿ ಹೆಡ್‌ಕಾನ್ಸ್‌ಸ್ಟೇಬಲ್ ಹಾಲೇಶಪ್ಪನವರ ನೇತೃತ್ವದಲ್ಲಿ ಶಿಬಿರ ಆಯೋಜಿಸಿಕೊಂಡು ಬರಲಾಗುತ್ತಿದೆ. ಹಾಲೇಶಪ್ಪನವರು ಸುಮಾರು ೫೦ ಬಾರಿ ರಕ್ತದಾನ ಮಾಡಿದ್ದು, ಅಲ್ಲದೆ ತುರ್ತು ಸಂದರ್ಭಗಳಲ್ಲಿ ರಕ್ತದಾನ ನೆರವು ಪೂರೈಸುವ ಮೂಲಕ ಸಂಕಷ್ಟದಲ್ಲಿರುವವರಿಗೆ ಸ್ಪಂದಿಸುತ್ತಿದ್ದಾರೆ.
ಜಿಲ್ಲಾ ರಕ್ಷಣಾಧಿಕಾರಿ ಬಿ. ನಿಖಿಲ್‌ರವರು ಪೊಲೀಸ್ ಇಲಾಖೆ ಹಾಗು ಆರ್‌ಎಎಫ್ ಅಧಿಕಾರಿಗಳು ಮತ್ತು ಸಿಬ್ಬಂದಿ ವರ್ಗದವರನ್ನು ಮತ್ತು ಜೀವ ಸಂಜೀವಿನ ರಕ್ತ ಕೇಂದ್ರದ ಸಿಬ್ಬಂದಿಗಳನ್ನು ಅಭಿನಂದಿಸಿ ಕೃತಜ್ಞತೆ ಸಲ್ಲಿಸಿದ್ದಾರೆ.