ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಮಾ.೧೧ರಿಂದ ಮುಷ್ಕರ

ಸರ್ಕಾರಿ ಆಸ್ಪತ್ರೆಗಳಲ್ಲಿ ಕೇವಲ ತುರ್ತು ಸೇವೆಗೆ ಅವಕಾಶ 


    ಭದ್ರಾವತಿ : ಆರೋಗ್ಯ ಇಲಾಖೆಯ ಅಧಿಕಾರಿ ಮತ್ತು ನೌಕರರ ಪ್ರಮುಖ ೧೨ ಬೇಡಿಕೆಗಳ ಈಡೇರಿಕೆಗಾಗಿ ರಾಜ್ಯಾದ್ಯಂತ ಮಾ.೧೧ ರಿಂದ ೧೫ರವರೆಗೆ ಮುಷ್ಕರ ಹಮ್ಮಿಕೊಳ್ಳಲಾಗಿದ್ದು, ಈ ಹಿನ್ನಲೆಯಲ್ಲಿ ತಾಲೂಕು ಸಾರ್ವಜನಿಕ ಸರ್ಕಾರಿ ಆಸ್ಪತ್ರೆ ಸೇರಿದಂತೆ ತಾಲೂಕಿನ ಎಲ್ಲಾ ಸರ್ಕಾರಿ ಆಸ್ಪತ್ರೆಗಳಲ್ಲಿ ಕೇವಲ ತುರ್ತು ಸೇವೆಗೆ ಮಾತ್ರ ಅವಕಾಶ ನೀಡಲಾಗಿದೆ. 
    ಕರ್ನಾಟಕ ಸರ್ಕಾರಿ ವೈದ್ಯಾಧಿಕಾರಿಗಳ ಸಂಘ, ಕರ್ನಾಟಕ ರಾಜ್ಯ ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಇಲಾಖಾ ನೌಕರರ ಸಂಘ, ಇಲಾಖೆಯ ಎಲ್ಲಾ ವೃಂದ ಸಂಘಗಳು ಹಾಗೂ ಗುತ್ತಿಗೆ ಮತ್ತು ಹೊರಗುತ್ತಿಗೆ ನೌಕರರ ಸಂಘ ಸೇರಿದಂತೆ ಎಲ್ಲಾ ಸಂಘಟನೆಗಳ ಸಾರಥ್ಯದಲ್ಲಿ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಬೆಂಬಲದೊಂದಿಗೆ ಆರೋಗ್ಯ ಇಲಾಖೆಯ ಅಧಿಕಾರಿ ಮತ್ತು ನೌಕರರು ತಮ್ಮ ಕೇಂದ್ರ ಸ್ಥಾನಗಳಲ್ಲಿ ಕಪ್ಪುಪಟ್ಟಿ ಧರಿಸಿ ಹೊರರೋಗಿ ಸೇವೆ ನೀಡದೆ ಕೇವಲ ತುರ್ತು ಸೇವೆ ಒದಗಿಸುವುದರ ಮೂಲಕ ಮುಷ್ಕರ ಹಮ್ಮಿಕೊಳ್ಳಲಾಗುತ್ತಿದ್ದು, ಸಾರ್ವಜನಿಕರು ಸಹಕರಿಸುವ ಮೂಲಕ ಮುಷ್ಕರ ಬೆಂಬಲಿಸುವಂತೆ ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಇಲಾಖೆ ನೌಕರರ ಸಂಘದ ಗೌರವಾಧ್ಯಕ್ಷರಾದ ತಾಲೂಕು ಆರೋಗ್ಯಾಧಿಕಾರಿ ಡಾ. ಎಂ.ವಿ ಅಶೋಕ್, ತಾಲೂಕು ಸಾರ್ವಜನಿಕ ಸರ್ಕಾರಿ ಆಸ್ಪತ್ರೆ ಮುಖ್ಯ ವೈದ್ಯಾಧಿಕಾರಿ ಡಾ. ಶಂಕರಪ್ಪ, ಅಧ್ಯಕ್ಷೆ ಕೆ. ಸುಶೀಲಬಾಯಿ ಮತ್ತು ಪ್ರಧಾನ ಕಾರ್ಯದರ್ಶಿ ಲೋಕೇಶ್ ಕೋರಿದ್ದಾರೆ.