ಜೀತ ಪದ್ದತಿ ನಿರ್ಮೂಲನೆಗೆ ಪ್ರತಿಯೊಬ್ಬರ ಸಹಕಾರ ಬಹಳ ಮುಖ್ಯ : ನ್ಯಾ. ರವಿಕುಮಾರ್
ಭದ್ರಾವತಿ ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ಮಂಗಳವಾರ ತಾಲೂಕು ಆಡಳಿತ, ತಾಲೂಕು ಪಂಚಾಯಿತಿ, ತಾಲೂಕು ಕಾನೂನು ಸೇವೆಗಳ ಪ್ರಾಧಿಕಾರ ಮತ್ತು ಕಾರ್ಮಿಕ ಇಲಾಖೆ ಸಂಯುಕ್ತಾಶ್ರಯದಲ್ಲಿ ಜೀತ ಪದ್ಧತಿ ನಿರ್ಮೂಲನಾ ದಿನಾಚರಣೆ ಹಾಗು ಕಾರ್ಯಾಗಾರದ ಆಯೋಜಿಸಲಾಗಿತ್ತು.
ಭದ್ರಾವತಿ: ಸಮಾಜದಲ್ಲಿ ಜೀತ ಪದ್ದತಿ ನಿರ್ಮೂಲನೆಗೆ ಪ್ರತಿಯೊಬ್ಬರ ಸಹಕಾರ ಬಹಳ ಮುಖ್ಯವಾಗಿದ್ದು, ಈ ನಿಟ್ಟಿನಲ್ಲಿ ರೂಪಿಸಲಾಗಿರುವ ಕಾಯ್ದೆ ಕುರಿತು ಅರಿತುಕೊಳ್ಳಬೇಕೆಂದು ಜೆಎಂಎಫ್‌ಸಿ ನ್ಯಾಯಾಲಯದ ಪ್ರಧಾನ ಸಿವಿಲ್ ನ್ಯಾಯಾಧೀಶರಾದ ರವಿಕುಮಾರ್ ಹೇಳಿದರು.
ಅವರು ಮಂಗಳವಾರ ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ತಾಲೂಕು ಆಡಳಿತ, ತಾಲೂಕು ಪಂಚಾಯಿತಿ, ತಾಲೂಕು ಕಾನೂನು ಸೇವೆಗಳ ಪ್ರಾಧಿಕಾರ ಮತ್ತು ಕಾರ್ಮಿಕ ಇಲಾಖೆ ಸಂಯುಕ್ತಾಶ್ರಯದಲ್ಲಿ ಆಯೋಜಿಸಲಾಗಿದ್ದ ಜೀತ ಪದ್ಧತಿ ನಿರ್ಮೂಲನಾ ದಿನಾಚರಣೆ ಹಾಗು ಕಾರ್ಯಾಗಾರದ ಅಧ್ಯಕ್ಷತೆವಹಿಸಿ ಮಾತನಾಡಿದರು.
ಜೀತ ಪದ್ಧತಿ ನಿಷೇಧ ಕಾಯ್ದೆ ೧೯೭೬ರ ಕುರಿತು ಸಮಗ್ರ ಮಾಹಿತಿ ನೀಡಿ, ಅಧಿಕಾರಿಗಳು ನಿರ್ವಹಿಸಬೇಕಾದ ಜವಾಬ್ದಾರಿಗಳನ್ನು ವಿವರಿಸಿದರು.
ಪೊಲೀಸ್ ಉಪವಿಭಾಗದ ಉಪಾಧೀಕ್ಷಕ ಪ್ರಕಾಶ್ ರಾಥೋಡ್ ಮಾತನಾಡಿ, ಉತ್ತಮ ಸಮಾಜ ನಿರ್ಮಿಸುವ ನಿಟ್ಟಿನಲ್ಲಿ ಇಂತಹ ಕಾರ್ಯಕ್ರಮಗಳು ಮಹತ್ವದ್ದಾಗಿದ್ದು, ಎಲ್ಲಾ ಅಧಿಕಾರಿಗಳು ತಮ್ಮ ತಮ್ಮ ಜವಾಬ್ದಾರಿಯನ್ನು ಅರಿತು ಕಾರ್ಯನಿರ್ವಹಿಸಬೇಕೆಂದರು.
ಉಪತಹಸೀಲ್ದಾರ್ ಮಂಜಾನಾಯ್ಕ, ಕಾರ್ಮಿಕ ಇಲಾಖೆಯ ಕಾರ್ಮಿಕ ನಿರೀಕ್ಷಕ ರಕ್ಷಿತ್ ಸೇರಿದಂತೆ ತಾಲೂಕು ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.