ಡಾ. ಬಿ.ಆರ್ ಅಂಬೇಡ್ಕರ್ ಚಿಂತನೆ, ಆದರ್ಶತನ ಅಳವಡಿಸಿಕೊಳ್ಳಿ : ಬಿ.ಕೆ ಸಂಗಮೇಶ್ವರ್
೪.೬೨ ಕೋ. ರು. ವೆಚ್ಚದ ನೂತನ ಅಂಬೇಡ್ಕರ್ ಭವನ ಉದ್ಘಾಟನೆ ಕಾರ್ಯಕ್ರಮ
ಭದ್ರಾವತಿಯಲ್ಲಿ ಮಂಗಳವಾರ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ತಾಲೂಕು ಆಡಳಿತ, ತಾಲೂಕು ಪಂಚಾಯಿತಿ, ನಗರಸಭೆ ಮತ್ತು ಸಮಜ ಕಲ್ಯಾಣ ಇಲಾಖೆ ಹಾಗು ದಲಿತ ಸಂಘಟನೆಗಳು ಸೇರಿದಂತೆ ವಿವಿಧ ಸಂಘ-ಸಂಸ್ಥೆಗಳ ಸಂಯುಕ್ತಾಶ್ರಯದಲ್ಲಿ ಆಯೋಜಿಸಲಾಗಿದ್ದ ಡಾ. ಬಿ.ಆರ್ ಅಂಬೇಡ್ಕರ್‌ರವರ ೧೩೫ನೇ ಜಯಂತಿ ಕಾರ್ಯಕ್ರಮ ಹಾಗು ನೂತನವಾಗಿ ಸುಮಾರು ೪.೬೨ ಕೋ. ರು. ವೆಚ್ಚದಲ್ಲಿ ನಗರದ ಹೃದಯ ಭಾಗ ಹಳೇನಗರದ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ ಸಮೀಪ ನಿರ್ಮಿಸಲಾಗಿರುವ ಡಾ. ಬಿ.ಆರ್ ಅಂಬೇಡ್ಕರ್ ಭವನ ಕರ್ನಾಟಕ ಗ್ರಾಮೀಣ ಮೂಲ ಸೌಕರ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಶಾಸಕ ಬಿ.ಕೆ ಸಂಗಮೇಶ್ವರ್ ಉದ್ಘಾಟಿಸಿದರು.
ಭದ್ರಾವತಿ : ವಿಶ್ವಜ್ಞಾನಿ, ಸಂವಿಧಾನ ಶಿಲ್ಪಿ ಡಾ. ಬಾಬಾ ಸಾಹೇಬ್ ಅಂಬೇಡ್ಕರ್‌ರವರ ಚಿಂತನೆ, ಆದರ್ಶತನ ಈ ದೇಶದ ಪ್ರತಿಯೊಬ್ಬರು ತಮ್ಮ ಬದುಕಿನಲ್ಲಿ ಅಳವಡಿಸಿಕೊಳ್ಳಬೇಕೆಂದು ಕರ್ನಾಟಕ ಗ್ರಾಮೀಣ ಮೂಲ ಸೌಕರ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಶಾಸಕ ಬಿ.ಕೆ ಸಂಗಮೇಶ್ವರ್ ಕರೆ ನೀಡಿದರು.
ಅವರು ಮಂಗಳವಾರ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ತಾಲೂಕು ಆಡಳಿತ, ತಾಲೂಕು ಪಂಚಾಯಿತಿ, ನಗರಸಭೆ ಮತ್ತು ಸಮಜ ಕಲ್ಯಾಣ ಇಲಾಖೆ ಹಾಗು ದಲಿತ ಸಂಘಟನೆಗಳು ಸೇರಿದಂತೆ ವಿವಿಧ ಸಂಘ-ಸಂಸ್ಥೆಗಳ ಸಂಯುಕ್ತಾಶ್ರಯದಲ್ಲಿ ಆಯೋಜಿಸಲಾಗಿದ್ದ ಡಾ. ಬಿ.ಆರ್ ಅಂಬೇಡ್ಕರ್‌ರವರ ೧೩೫ನೇ ಜಯಂತಿ ಕಾರ್ಯಕ್ರಮ ಹಾಗು ನೂತನವಾಗಿ ಸುಮಾರು ೪.೬೨ ಕೋ. ರು. ವೆಚ್ಚದಲ್ಲಿ ನಗರದ ಹೃದಯ ಭಾಗ ಹಳೇನಗರದ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ ಸಮೀಪ ನಿರ್ಮಿಸಲಾಗಿರುವ ಡಾ. ಬಿ.ಆರ್ ಅಂಬೇಡ್ಕರ್ ಭವನ ಉದ್ಘಾಟಿಸಿ ಮಾತನಾಡಿದರು.
ಅಂಬೇಡ್ಕರ್‌ರವರು ರೂಪಿಸಿಕೊಟ್ಟಿರುವ ಸಂವಿಧಾನದ ಆಶಯದಂತೆ ನಾವೆಲ್ಲರೂ ಬದುಕಿದಾಗ ಮಾತ್ರ ಅವರ ಜನ್ಮದಿನ ಸಾರ್ಥಕವಾಗುತ್ತದೆ. ಅಂಬೇಡ್ಕರ್‌ರವರ ಭವನ ಪ್ರತಿಯೊಬ್ಬರು ಸದ್ಬಳಕೆ ಮಾಡಿಕೊಳ್ಳುವಂತಾಗಬೇಕು. ಮುಂದಿನ ದಿನಗಳಲ್ಲಿ ಬಾಕಿ ಉಳಿದಿರುವ ಊಟದ ಕೊಠಡಿ ನಿರ್ಮಾಣಕ್ಕೆ ೨ ಕೋ.ರು. ಅನುದಾನ ಸರ್ಕಾರದಿಂದ ಬಿಡುಗಡೆ ಮಾಡಿಸಿಕೊಡಲು ಶ್ರಮಿಸುವುದಾಗಿ ಭರವಸೆ ನೀಡಿದರು. ಅಲ್ಲದೆ ಅಂಬೇಡ್ಕರ್ ಭವನ ನಿರ್ಮಾಣಕ್ಕೆ ಶ್ರಮಿಸಿದ ಪ್ರತಿಯೊಬ್ಬರಿಗೂ ಕೃತಜ್ಞತೆ ಸಲ್ಲಿಸಿದರು.
ಪೊಲೀಸ್ ಉಪಾಧೀಕ್ಷಕ ಪ್ರಕಾಶ್ ರಾಥೋಡ್ ಉಪನ್ಯಾಸ ನೀಡಿ, ಅಂಬೇಡ್ಕರ್‌ರವರ ಬಾಲ್ಯ ಜೀವನ, ವಿದ್ಯಾಭ್ಯಾಸ ಮತ್ತು ಅನುಭವಿಸಿದ ನೋವು, ಅವಮಾನ, ಶೋಷಣೆಗಳು ಹಾಗು ಸಂವಿಧಾನ ರಚಿಸುವಲ್ಲಿ ಅವರ ಶ್ರಮ ವಿವರಿಸಿದರು. ಇಂದು ನಾವೆಲ್ಲರೂ ಎಲ್ಲಾ ರೀತಿಯ ಸಮಾನತೆಯಿಂದ ನೆಮ್ಮದಿಯಾಗಿ ಬದುಕಲು ಅಂಬೇಡ್ಕರ್‌ರವರು ಕಾರಣಕರ್ತರಾಗಿದ್ದಾರೆ. ಇಂತಹ ಮಹಾನ್ ಚೇತನ ನಾವೆಲ್ಲರೂ ಪ್ರತಿ ದಿನ, ಪ್ರತಿ ಕ್ಷಣ ಸ್ಮರಿಸಬೇಕಾಗಿದೆ ಎಂದರು.
ಕರ್ನಾಟಕ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ವರ್ಗಗಳ ಅಲೆಮಾರಿ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಜಿ. ಪಲ್ಲವಿ ಮಾತನಾಡಿ, ಪ್ರಸ್ತುತ ದಿನಗಳಲ್ಲಿ ಸಂವಿಧಾನಕ್ಕೆ ಚ್ಯುತಿ ತರುವ ಕೆಲಸ ಮಾಡಲಾಗುತ್ತಿದೆ. ನಾವೆಲ್ಲರೂ ಜಾಗೃತಗೊಳ್ಳಬೇಕಾಗಿದೆ. ಸಂವಿಧಾನದ ಮೂಲಕ ನಮಗೆ ಲಭಿಸಿರುವ ಅಧಿಕಾರ ಸದ್ಬಳಕೆ ಮಾಡಿಕೊಂಡು ಸಂವಿಧಾನ ಆಶಯದಂತೆ ಕಾರ್ಯ ನಿರ್ವಹಿಸಬೇಕೆಂದರು.
ವೇದಿಕೆಯಲ್ಲಿ ನಗರಸಭೆ ಅಧ್ಯಕ್ಷೆ ಜೆ.ಸಿ ಗೀತಾರಾಜಕುಮಾರ್, ಉಪಾಧ್ಯಕ್ಷ ಬಷೀರ್ ಅಹಮದ್, ಸ್ಥಾಯಿ ಸಮಿತಿ ಅಧ್ಯಕ್ಷೆ ಪ್ರೇಮ ಬದರಿನಾರಾಯಣ, ಪೌರಾಯುಕ್ತ ಕೆ.ಎನ್ ಹೇಮಂತ್, ತಹಸೀಲ್ದಾರ್ ಪರುಸಪ್ಪ ಕುರುಬರ, ತಾಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಎಂ. ಆಶಾಲತ, ಸರ್ಕಾರದ ೫ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಬಿ.ಎಸ್ ಗಣೇಶ್, ನಗರ ಆಶ್ರಯ ಸಮಿತಿ ಅಧ್ಯಕ್ಷ ಬಿ.ಎಸ್ ಗೋಪಾಲ್, ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ತಾಲೂಕು ಅಧ್ಯಕ್ಷ ಬಿ. ಸಿದ್ದಬಸಪ್ಪ, ಹಿರಿಯ ಸದಸ್ಯ ಬಿ.ಕೆ ಮೋಹನ್ ಸೇರಿದಂತೆ ದಲಿತ ಸಂಘಟನೆಗಳ ಮುಖಂಡರು, ಮಹಿಳಾ ಸಂಘಟನೆಗಳ ಪ್ರಮುಖರು, ಸರ್ಕಾರದ ವಿವಿಧ ಇಲಾಖೆಗಳ ಅಧಿಕಾರಿಗಳು, ಸ್ಥಳೀಯ ಸಂಸ್ಥೆಗಳ ಜನಪ್ರತಿನಿಧಿಗಳು ಉಪಸ್ಥಿತರಿದ್ದರು.
ಸಮಾಜ ಕಲ್ಯಾಣ ಇಲಾಖೆ ಅಧಿಕಾರಿ ಶಶಿಕುಮಾರ್ ಕಾರ್ಯಕ್ರಮ ನಿರೂಪಿಸಿ, ಸಹಾಯಕ ನಿರ್ದೇಶಕ ಕೆ.ಜಿ ಶಿವಕುಮಾರ್ ಸ್ವಾಗತಿಸಿದರು. ಡಾ. ಬಿ.ಆರ್ ಅಂಬೇಡ್ಕರ್ ಹಾಗು ರಮಾಬಾಯಿ ಅಂಬೇಡ್ಕರ್ ಪ್ರಶಸ್ತಿ ಪ್ರಧಾನ ಮಾಡಲಾಯಿತು. ಪ್ರತಿಭಾನ್ವಿತ ವಿದ್ಯಾರ್ಥಿಗಳನ್ನು ಅಭಿನಂದಿಸಿ ಸನ್ಮಾನಿಸಲಾಯಿತು.
ಕಾರ್ಯಕ್ರಮಕ್ಕೂ ಮೊದಲು ವಿವಿಧ ಕಲಾ ತಂಡಗಳೊಂದಿಗೆ ನಗರದ ಬಿ.ಎಚ್ ರಸ್ತೆ, ಅಂಡರ್‌ಬ್ರಿಡ್ಜ್ ಬಳಿ ಡಾ. ಅಂಬೇಡ್ಕರ್ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಮೆರವಣಿಗೆಗೆ ಚಾಲನೆ ನೀಡಲಾಯಿತು. ಅಂಬೇಡ್ಕರ್ ವೃತ್ತದಿಂದ ಹಾಲಪ್ಪ ವೃತ್ತ, ಮಾಧವಚಾರ್ ವೃತ್ತ, ರಂಗಪ್ಪ ವೃತ್ತ ಮೂಲಕ ಡಾ. ಪುನೀತ್ ರಾಜಕುಮಾರ್ ರಸ್ತೆಯಲ್ಲಿ ಸಾಗಿ ಅಂಬೇಡ್ಕರ್ ಭವನ ತಲುಪಿತು.
