`ಸರ್ಕಾರಿ ನ್ಯಾಯಬೆಲೆ ಅಂಗಡಿ' ಚಲನಚಿತ್ರ ಪೋಸ್ಟರ್ ಶಾಸಕ ಸಂಗಮೇಶ್ವರ್ ಬಿಡುಗಡೆ
ಚಿತ್ರದ ಯಶಸ್ವಿಗೆ ಎಲ್ಲಾ ರೀತಿಯ ಸಹಕಾರ ನೀಡಲು ಬದ್ಧ
ಭದ್ರಾವತಿ ಪತ್ರಿಕಾಭವನದಲ್ಲಿ ಆಯೋಜಿಸಲಾಗಿದ್ದ ಪತ್ರಿಕಾಗೋಷ್ಠಿಯಲ್ಲಿ `ಸರ್ಕಾರಿ ನ್ಯಾಯಬೆಲೆ ಅಂಗಡಿ' ಚಲನಚಿತ್ರ ಪೋಸ್ಟರ್ ಕರ್ನಾಟಕ ಗ್ರಾಮೀಣ ಮೂಲ ಸೌಕರ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಶಾಸಕ ಬಿ.ಕೆ ಸಂಗಮೇಶ್ವರ್ ಬಿಡುಗಡೆಗೊಳಿಸಿದರು.
ಭದ್ರಾವತಿ : ಪಡಿತರ ವಿತರಕರ ಸಮಸ್ಯೆಗಳು ಸಾಕಷ್ಟಿವೆ. ಅವರಿಗೂ ಸಾಮಾಜಿಕ ಜವಾಬ್ದಾರಿಗಳಿವೆ. ಅವರ ಬದುಕಿನ ನೈಜತೆ ಕುರಿತು ಚಿತ್ರಿಕರೀಸಲಾಗಿರುವ `ಸರ್ಕಾರಿ ನ್ಯಾಯಬೆಲೆ ಅಂಗಡಿ' ಚಲನಚಿತ್ರ ಯಶಸ್ವಿ ಪ್ರದರ್ಶನ ಕಾಣುವಂತಾಗಲಿ ಎಂದು ಕರ್ನಾಟಕ ಗ್ರಾಮೀಣ ಮೂಲ ಸೌಕರ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಶಾಸಕ ಬಿ.ಕೆ ಸಂಗಮೇಶ್ವರ್ ಆಶಿಸಿದರು.
ಅವರು ಪತ್ರಿಕಾಭವನದಲ್ಲಿ ಆಯೋಜಿಸಲಾಗಿದ್ದ ಪತ್ರಿಕಾಗೋಷ್ಠಿಯಲ್ಲಿ ಚಲನಚಿತ್ರದ ಪೋಸ್ಟರ್ ಬಿಡುಗಡೆಗೊಳಿಸಿ ಮಾತನಾಡಿದರು. ಚಲನಚಿತ್ರ ಯಶಸ್ವಿಗೆ ಎಲ್ಲಾ ರೀತಿಯ ಸಹಕಾರ ನೀಡುವುದಾಗಿ ಭರವಸೆ ನೀಡಿದರು.
ಕರ್ನಾಟಕ ರಾಜ್ಯ ಸರ್ಕಾರಿ ಪಡಿತರ ವಿತರಕರ ಸಂಘದ ರಾಜ್ಯಾಧ್ಯಕ್ಷ ಟಿ. ಕೃಷ್ಣಪ್ಪ ಮಾತನಾಡಿ, ಪಡಿತರ ವಿತರಕರ ಬೇಡಿಕೆಗಳ ಈಡೇರಿಕೆಗಾಗಿ ಸಂಘ ನಿರಂತರ ಹೋರಾಟ ನಡೆಸುತ್ತಾ ಬಂದಿದೆ. ಕೇಂದ್ರ ಹಾಗು ರಾಜ್ಯ ಸರ್ಕಾರಗಳಿಗೆ ಹಲವಾರುಬಾರಿ ಮನವಿ ಸಲ್ಲಿಸಿ ಒತ್ತಾಯಿಸಲಾಗುತ್ತಿದೆ. ಈ ನಡುವೆ ವಿತರಕರು ತಮ್ಮ ಜವಾಬ್ದಾರಿಗಳನ್ನು ಸಮರ್ಥವಾಗಿ ನಿಬಾಯಿಸಿಕೊಂಡು ಹೋಗುತ್ತಿದ್ದಾರೆ. ವಿತರಕರಿಗೆ ಮತ್ತಷ್ಟು ಸ್ಪೂರ್ತಿ ನೀಡುವ ಹಾಗು ವಿತರಕರ ವಾಸ್ತವಿಕ ಬದುಕು ಜನಸಾಮಾನ್ಯರಿಗೆ ತಿಳಿಸಿಕೊಡುವ ನಿಟ್ಟಿನಲ್ಲಿ ಚಿತ್ರರಂಗದ ಕಲಾವಿದರು ಮುಂದಾಗಿರುವುದು ಶ್ಲಾಘನೀಯ ಕಾರ್ಯವಾಗಿದ್ದು, ಚಿತ್ರತಂಡಕ್ಕೆ ಕೃತಜ್ಞತೆ ಸಲ್ಲಿಸುತ್ತೇನೆ ಎಂದರು.
ಚಿತ್ರದ ಯಶಸ್ಸಿಗೆ ಸಂಘ ಎಲ್ಲಾ ರೀತಿಯ ಸಹಕಾರ ನೀಡಲಿದ್ದು, ವಿತರಕರು ಚಿತ್ರ ತಂಡದೊಂದಿಗೆ ತಮಗೆ ವಹಿಸಿಕೊಡುವ ಕಾರ್ಯಗಳನ್ನು ನಿರ್ವಹಿಸಲು ಬದ್ಧರಾಗಿದ್ದಾರೆ ಎಂದರು.
ಚಿತ್ರದ ಕಥೆ 'ಸರ್ಕಾರಿ ನ್ಯಾಯಬೆಲೆ ಅಂಗಡಿ' ಮತ್ತು ಪಡಿತರ ವ್ಯವಸ್ಥೆಯ ಸುತ್ತ ಹೆಣೆದಿದ್ದು, ಗ್ರಾಮೀಣ ಸೊಗಡನ್ನು ಹೊಂದಿದೆ. ವಿಶೇಷವಾಗಿ ಮಂಡ್ಯ ಜಿಲ್ಲೆಯ ಸುತ್ತಮುತ್ತ ೫೨ ದಿನಗಳ ಕಾಲ ಚಿತ್ರೀಕರಣ ನಡೆಸಲಾಗಿದೆ. ಚಿತ್ರದಲ್ಲಿ ಕುಮಾರ್ ಬಂಗಾರಪ್ಪ, ರಾಗಿಣಿ ದ್ವಿವೇದಿ, ದೊಡ್ಡಣ್ಣ ಸೇರಿದಂತೆ ಅನೇಕರು ಪ್ರಮುಖ ಪಾತ್ರಗಳಲ್ಲಿ ನಟಿಸಿದ್ದಾರೆ. 'ಜಯಶಂಕರ ಟಾಕೀಸ್' ಬ್ಯಾನರ್‌ನಲ್ಲಿ ನಿರ್ಮಾಣವಾಗುತ್ತಿರುವ ಈ ಚಿತ್ರವನ್ನು ತೇಜು ಮೂರ್ತಿ ಮತ್ತು ಪದ್ಮಾವತಿ ಚಂದ್ರಶೇಖರ್ ನಿರ್ಮಿಸುತ್ತಿದ್ದಾರೆ. ಅನಂತ್ ಆರ್ಯನ್ ಸಂಗೀತ ನೀಡಿದ್ದು, ಬಿ. ರಾಮಮೂರ್ತಿ ಕಥೆ, ಚಿತ್ರಕಥೆ ಮತ್ತು ಸಂಭಾಷಣೆ ರಚಿಸಿದ್ದಾರೆ. ಸಾತ್ವಿಕ್ ಪವನ್ ಕುಮಾರ್ ಛಾಯಾಗ್ರಹಣದ ಜೊತೆಗೆ ನಿರ್ದೇಶನವನ್ನೂ ವಹಿಸಿಕೊಂಡಿದ್ದಾರೆಂದು ನಿರ್ಮಾಪಕ ಬಾ. ಮಾ. ಹರೀಶ್ ಮಾಹಿತಿ ನೀಡಿದರು.
ಪತ್ರಿಕಾಗೋಷ್ಠಿಯಲ್ಲಿ ಚಿತ್ರದ ನಿರ್ಮಾಪಕರಾದ ತೇಜು ಮೂರ್ತಿ ಮತ್ತು ಪದ್ಮಾವತಿ ಚಂದ್ರಶೇಖರ್, ಬಾ. ಮಾ. ಗಿರೀಶ್, ನಿರ್ವಾಹಕ ವ್ಯವಸ್ಥಾಪಕ ಚಂದ್ರಣ್ಣ, ಕರ್ನಾಟಕ ಸರ್ಕಾರಿ ಪಡಿತರ ವಿತರಕರ ಸಂಘದ ರಾಜ್ಯ ಸಂಘಟನಾ ಕಾರ್ಯದರ್ಶಿ ಸಿದ್ದಲಿಂಗಯ್ಯ, ತಾಲೂಕು ನಗರ ಅಧ್ಯಕ್ಷ ನಾಗೇಶ್, ಗ್ರಾಮಾಂತರ ಅಧ್ಯಕ್ಷ ಸೋಮಣ್ಣ, ಲಕ್ಷ್ಮೀಕಾಂತ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.
