ಕೊನೆಗೂ ಜನ್ಮದಿನದಂದೇ ಉದ್ಘಾಟನೆಗೊಳ್ಳುತ್ತಿದೆ ಡಾ. ಬಿ.ಆರ್ ಅಂಬೇಡ್ಕರ್ ಭವನ


ಭದ್ರಾವತಿಯಲ್ಲಿ ನಿರ್ಮಾಣಗೊಂಡಿರುವ ನೂತನ ಡಾ. ಬಿ.ಆರ್ ಅಂಬೇಡ್ಕರ್ ಭವನ. 

     * ಅನಂತಕುಮಾರ್
       ಮುಖ್ಯಾಂಶಗಳು :-
    - ಮಾಜಿ ಶಾಸಕ ದಿವಂಗತ ಎಂ.ಜೆ ಅಪ್ಪಾಜಿ ೨೦೧೭ರಲ್ಲಿ ಶಂಕುಸ್ಥಾಪನೆ. 
    - ಒಟ್ಟು ೪.೬೨ ಕೋ. ರು. ವೆಚ್ಚದ ಸುಸ್ಸಜಿತ ಭವನ 
    - ವಿಳಂಬ ಕಾಮಕಾರಿ, ೯ ವರ್ಷಗಳ ನಂತರ ಪೂರ್ಣ
    - ಎಸ್. ಮಧು ಬಂಗಾರಪ್ಪ ಉದ್ಘಾಟನೆ, ಸಚಿವ ಡಾ. ಎಚ್.ಸಿ ಮಹಾದೇವಪ್ಪ ಉಪಸ್ಥಿತಿ
     ಭದ್ರಾವತಿ: ಕ್ಷೇತ್ರದಲ್ಲಿ ಸುಮಾರು ೪ ದಶಕಗಳ ಹೋರಾಟಕ್ಕೆ ಇದೀಗ ಫಲ ಲಭಿಸಿದ್ದು, ವಿಶ್ವಜ್ಞಾನಿ, ಭಾರತರತ್ನ, ಸಂವಿಧಾನ ಶಿಲ್ಪಿ ಡಾ. ಬಿ.ಆರ್ ಅಂಬೇಡ್ಕರ್ ಭವನ ಇಂದು ಉದ್ಘಾಟನೆಗೊಳ್ಳುತ್ತಿದೆ.  
    ದಲಿತ ಚಳುವಳಿ ಹುಟ್ಟಿದ ನೆಲದಲ್ಲಿ ಅದರ ಮೂಲ ಪ್ರೇರಕ ಶಕ್ತಿ, ಜಗತ್ತಿನ ಶ್ರೇಷ್ಠ ಜ್ಞಾನಿ ಎಂಬ ಹೆಗ್ಗಳಿಕೆಗೆ ಪಾತ್ರರಾಗಿರುವ ಡಾ. ಬಿ.ಆರ್ ಅಂಬೇಡ್ಕರ್‌ರವರ ಭವನದ ಕನಸು ಇದೀಗ ನನಸಾಗುತ್ತಿದೆ. ಕ್ಷೇತ್ರದಲ್ಲಿ ಸುಸಜ್ಜಿತ ಅಂಬೇಡ್ಕರ್ ಭವನ ನಿರ್ಮಿಸಬೇಕೆಂದು ವಿವಿಧ ದಲಿತಪರ ಸಂಘಟನೆಗಳು ಸುಮಾರು ೪ ದಶಕಗಳ ಹಿಂದೆ ಆರಂಭಿಸಿದ ಹೋರಾಟ ಇದೀಗ ಅಂತ್ಯಗೊಳ್ಳುವಂತಾಗಿದೆ.
    ಆರಂಭದ ಹೋರಾಟದಲ್ಲಿ ಜಯ ಲಭಿಸಿದಾದರೂ ನಿರೀಕ್ಷೆಯಂತೆ ಸುಸಜ್ಜಿತ ಭವನ ನಿರ್ಮಾಣಗೊಳ್ಳಲಿಲ್ಲ. ಆರಂಭದಲ್ಲಿ ನಗರದ ಬಿ.ಎಚ್ ರಸ್ತೆ ಅಪ್ಪರ್ ಹುತ್ತಾ ರೈಲ್ವೆ ಕೆಳಸೇತುವೆ ಬಳಿ ಅತಿ ಚಿಕ್ಕದಾದ, ಗುಡಿಸಲಿನ ಮಾದರಿಯ ಭವನ ನಿರ್ಮಾಣಗೊಂಡಿತು. ಆದರೆ ಈ ಭವನವನ್ನು ಯಾರು ಸಹ ಅಂಬೇಡ್ಕರ್ ಭವನವೆಂದು ಸ್ವೀಕರಿಸಲು ಸಿದ್ದರಿರಲಿಲ್ಲ. ಈ ಹಿನ್ನಲೆಯಲ್ಲಿ ಈ  ಭವನ ಸುಮಾರು ೪-೫ ವರ್ಷಗಳವರೆಗೆ ಪಾಳು ಬಿದ್ದಿತ್ತು. ನಂತರದ ದಿನಗಳಲ್ಲಿ ಈ ಭವನವನ್ನು ನಗರಸಭೆ ಆಡಳಿತ ಸಾರ್ವಜನಿಕ ಗ್ರಂಥಾಲಯಕ್ಕೆ ಬಿಟ್ಟುಕೊಡುವ ಮೂಲಕ ಇದರ ನಿರ್ವಹಣೆ ಜವಾಬ್ದಾರಿಯನ್ನು ಗ್ರಂಥಾಲಯ ಇಲಾಖೆಗೆ ವಹಿಸಿದೆ.
     ಪುನಃ ಮುಂದುವರೆದ ಹೋರಾಟ : ಜಾಗ ಹುಡುಕಾಟ
    ಸುಸಜ್ಜಿತ ಅಂಬೇಡ್ಕರ್ ಭವನ ನಿರ್ಮಾಣಕ್ಕಾಗಿ ಪುನಃ ದಲಿತಪರ ಸಂಘಟನೆಗಳು ಹೋರಾಟ ಮುಂದುವರೆಸಿದ ಪರಿಣಾಮ ನಗರಸಭೆ ವ್ಯಾಪ್ತಿಯಲ್ಲಿ ಜಾಗ ಹುಡುಕುವ ಪ್ರಕ್ರಿಯೆ ಆರಂಭಗೊಂಡಿತು. ಮೊದಲು ಹೊಸಮನೆ ಮುಖ್ಯರಸ್ತೆಯಲ್ಲಿರುವ ಹಳೇ ಸಂತೆ ಮೈದಾನದಲ್ಲಿ ಭವನ ನಿರ್ಮಾಣಕ್ಕೆ ಗುದ್ದಲಿ ಪೂಜೆ ನಡೆಸಲಾಯಿತು. ಆದರೆ ಈ ಸ್ಥಳ ಸೂಕ್ತವಲ್ಲ ಬೇರೆಡೆ ನಿರ್ಮಿಸಬೇಕೆಂದು ಒತ್ತಾಯಗಳು ಕೇಳಿ ಬಂದ ಹಿನ್ನಲೆಯಲ್ಲಿ ಕೈಬಿಡಲಾಯಿತು. ನಂತರ ಜಟ್‌ಪಟ್ ನಗರದಲ್ಲಿ ಭವನಕ್ಕೆ ಜಾಗ ಮಂಜೂರಾತಿ ಪಡೆದುಕೊಂಡರೂ ಈ ಜಾಗ ಸಹ ಸೂಕ್ತವಲ್ಲ ಎಂದು ಕೈಬಿಡಲಾಯಿತು. ಕೊನೆಯದಾಗಿ ತಾಲೂಕು ಕಚೇರಿ ರಸ್ತೆ(ಡಾ. ಪುನೀತ್ ರಾಜಕುಮಾರ್ ರಸ್ತೆ),  ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ ಹಿಂಭಾಗ ನಗರಸಭೆಗೆ ಸೇರಿದ ಖಾಲಿ ಜಾಗದಲ್ಲಿ ಭವನ ನಿರ್ಮಾಣ ಮಾಡಲು ತೀರ್ಮಾನಿಸಲಾಯಿತು. ೨೦೧೭ರಲ್ಲಿ ಅಂದಿನ ಶಾಸಕರಾಗಿದ್ದ ದಿವಂಗತ ಎಂ.ಜೆ ಅಪ್ಪಾಜಿಯವರು ಭವನ ನಿರ್ಮಾಣಕ್ಕೆ ಗುದ್ದಲಿ ಪೂಜೆ ನೆರವೇರಿಸಿದ್ದರು. ಸುಮಾರು ೯ ವರ್ಷಗಳ ನಂತರ ಬಹುತೇಕ ಪೂರ್ಣಗೊಂಡು ಉದ್ಘಾಟನೆಗೊಳ್ಳುತ್ತಿದೆ.  
     ಅನುದಾನ ಬಿಡುಗಡೆಯಾದರೂ ಕಾಮಗಾರಿ ವಿಳಂಬ : ಒಟ್ಟು ೪.೬೨ ಕೋ. ರು. ವೆಚ್ಚ
    ಸಮಾಜ ಕಲ್ಯಾಣ ಇಲಾಖೆ ವತಿಯಿಂದ ಭವನ ನಿರ್ಮಿಸಲಾಗಿದೆ. ಆರಂಭದಲ್ಲಿ ಇಲಾಖೆಗೆ ಸರ್ಕಾರದಿಂದ ರು. ೧ ಕೋ. ಅನುದಾನ ಬಿಡುಗಡೆಗೊಂಡಿದ್ದು, ಈ ಅನುದಾನ ಬಳಸಿಕೊಂಡು ಮೊದಲ ಹಂತದ ಕಾಮಗಾರಿ ನಡೆಸಲಾಯಿತು. ಹೆಚ್ಚಿನ ಅನುದಾನ ಅಗತ್ಯತೆ ಹಿನ್ನಲೆಯಲ್ಲಿ ಪುನಃ ಇಲಾಖೆಗೆ ರು. ೧ ಕೋ. ಅನುದಾನ ಸರ್ಕಾರದಿಂದ ಬಿಡುಗಡೆ ಮಾಡಲಾಗಿದೆ. ಇದರ ಜೊತೆಗೆ ನಗರಸಭೆ ವತಿಯಿಂದ ರು.೫೦ ಲಕ್ಷ ಬಿಡುಗಡೆಗೊಳಿಸಲಾಗಿದೆ. ಅಲ್ಲದೆ ಶಾಸಕರ ಪ್ರದೇಶಾಭಿವೃದ್ಧಿ ನಿಧಿಯಿಂದ ರು.೩೭.೩೭ ಲಕ್ಷ ರು. ಹಾಗು ಸಂಸದರ ನಿಧಿಯಿಂದ ೨೫ ಲಕ್ಷ ರು. ಸೇರಿದಂತೆ ಒಟ್ಟು ೩.೧೨ ಕೋ. ರು. ಅನುದಾನ ಲಭ್ಯವಾದರೂ ಸಹ ಭವನ ಪೂರ್ಣಗೊಳ್ಳಲಿಲ್ಲ. ಈ ನಡುವೆ ಸರ್ಕಾರ ಹೆಚ್ಚುವರಿಯಾಗಿ ಪುನಃ ೧.೫೦ ಕೋ.ರು ಅನುದಾನ ಬಿಡುಗಡೆಗೊಳಿಸಿತ್ತು. ಆದರೂ ಸಹ ಕಾಮಗಾರಿ ಪೂರ್ಣಗೊಳಿಸುವಲ್ಲಿ ನಿರ್ಮಿತಿ ಕೇಂದ್ರ ವಿಳಂಬ ಧೋರಣೆ ಅನುಸರಿಸಿತ್ತು. ಈ ನಡುವೆ ಹೋರಾಟಗಳು ತೀವ್ರಗೊಂಡು ಭವನ ಕಾಮಗಾರಿ ಪೂರ್ಣಗೊಳಿಸುವಂತೆ ಎಚ್ಚರಿಸಿದ ಹಿನ್ನಲೆಯಲ್ಲಿ ಇದೀಗ ಕಾಮಗಾರಿ ಮುಕ್ತಾಯಗೊಂಡು ಉದ್ಘಾಟನೆಗೊಳ್ಳುತ್ತಿದೆ. ಇನ್ನೂ ಕೆಲವು ಕೆಲಸಗಳು ಬಾಕಿ ಇದ್ದು, ಮುಂದಿನ ದಿನಗಳಲ್ಲಿ ಹಂತ ಹಂತವಾಗಿ ಕೈಗೆತ್ತಿಕೊಳ್ಳುವ ವಿಶ್ವಾಸವಿದೆ. 
    ಬಂಗಾರಪ್ಪ ಪುತ್ರ ಮಧು ಬಂಗಾರಪ್ಪ ಉದ್ಘಾಟನೆ:
    ಸಮಾಜವಾದಿ, ಮಾಜಿ ಮುಖ್ಯಮಂತ್ರಿ ದಿವಂಗತ ಎಸ್. ಬಂಗಾರಪ್ಪನವರ ಪುತ್ರ ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಡಾ. ಬಿ.ಆರ್ ಅಂಬೇಡ್ಕರ್ ಭವನ ಉದ್ಘಾಟಿಸುತ್ತಿದ್ದಾರೆ. ಕರ್ನಾಟಕ ಗ್ರಾಮೀಣ ಮೂಲ ಸೌಕರ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಶಾಸಕ ಬಿ.ಕೆ ಸಂಗಮೇಶ್ವರ್ ಅಧ್ಯಕ್ಷತೆವಹಿಸಲಿದ್ದು, ಸಮಾಜ ಕಲ್ಯಾಣ ಖಾತೆ ಸಚಿವ ಎಚ್.ಸಿ ಮಹಾದೇವಪ್ಪ, ಸಂಸದ ಬಿ.ವೈ ರಾಘವೇಂದ್ರ ಸೇರಿದಂತೆ ವಿವಿಧ ನಿಗಮ ಮಂಡಳಿಗಳ ಅಧ್ಯಕ್ಷರು, ವಿಧಾನ ಸಭೆ ಹಾಗು ವಿಧಾನ ಪರಿಷತ್ ಸದಸ್ಯರು, ಸ್ಥಳೀಯ ಸಂಸ್ಥೆಗಳ ಜನಪ್ರತಿನಿಧಿಗಳು ಸೇರಿದಂತೆ ಇನ್ನಿತರರು ಉಪಸ್ಥಿತರಿರುವರು.