ದಲಿತ ಮುಖಂಡ ವಿ. ವಿನೋದ್‌ಗೆ ಡಾ. ಬಿ.ಆರ್ ಅಂಬೇಡ್ಕರ್ ಪ್ರಶಸ್ತಿ
ಭದ್ರಾವತಿ ನಗರದ ಕರ್ನಾಟಕ ದಲಿತ ಸಮನ್ವಯ ಸಮಿತಿ ಹಾಗೂ ಕರ್ನಾಟಕ ರಾಜ್ಯ ಕಟ್ಟಡ ಮತ್ತು ಇತರೆ ನಿರ್ಮಾಣ ಕೂಲಿ ಕಾರ್ಮಿಕರ ಒಕ್ಕೂಟದ ರಾಜ್ಯಾಧ್ಯಕ್ಷ ದಲಿತ ಮುಖಂಡ ವಿ. ವಿನೋದ್‌ರವರಿಗೆ ತಾಲೂಕು ಮಟ್ಟದ ಡಾ. ಬಿ.ಆರ್ ಅಂಬೇಡ್ಕರ್ ಪ್ರಶಸ್ತಿ ನೀಡಿ ಗೌರವಿಸಲಾಯಿತು.
ಭದ್ರಾವತಿ: ನಗರದ ಕರ್ನಾಟಕ ದಲಿತ ಸಮನ್ವಯ ಸಮಿತಿ ಹಾಗೂ ಕರ್ನಾಟಕ ರಾಜ್ಯ ಕಟ್ಟಡ ಮತ್ತು ಇತರೆ ನಿರ್ಮಾಣ ಕೂಲಿ ಕಾರ್ಮಿಕರ ಒಕ್ಕೂಟದ ರಾಜ್ಯಾಧ್ಯಕ್ಷ ದಲಿತ ಮುಖಂಡ ವಿ. ವಿನೋದ್‌ರವರಿಗೆ ತಾಲೂಕು ಮಟ್ಟದ ಡಾ. ಬಿ.ಆರ್ ಅಂಬೇಡ್ಕರ್ ಪ್ರಶಸ್ತಿ ನೀಡಿ ಗೌರವಿಸಲಾಯಿತು.
ಜಿಲ್ಲಾಡಳಿತ, ಜಿಲ್ಲಾ ಪಂಚಾಯತಿ, ತಾಲೂಕು ಆಡಳಿತ, ತಾಲೂಕು ಪಂಚಾಯಿತಿ, ನಗರಸಭೆ ಮತ್ತು ಸಮಾಜ ಕಲ್ಯಾಣ ಇಲಾಖೆ ಹಾಗೂ ವಿವಿಧ ಸಂಘ-ಸಂಸ್ಥೆಗಳ ಸಂಯುಕ್ತಾಶ್ರಯದಲ್ಲಿ ಆಯೋಜಿಸಲಾಗಿದ್ದ ವಿಶ್ವಜ್ಞಾನಿ, ಭಾರತರತ್ನ ಡಾ.ಬಿ.ಆರ್ ಅಂಬೇಡ್ಕರ್ ೧೩೫ನೇ ಜನ್ಮ ದಿನಾಚರಣೆ ಹಾಗು ನೂತನವಾಗಿ ನಿರ್ಮಾಣಗೊಂಡಿರುವ ಡಾ. ಬಿ.ಆರ್ ಅಂಬೇಡ್ಕರ್ ಭವನ ಉದ್ಘಾಟನಾ ಕಾರ್ಯಕ್ರಮದಲ್ಲಿ ಪ್ರಶಸ್ತಿ ನೀಡಿ ಗೌರವಿಸಲಾಯಿತು.
ವಿನೋದ್‌ರವರು ಹಲವಾರು ವರ್ಷಗಳಿಂದ ದಲಿತಪರ ಹೋರಾಟಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದು, ಅಲ್ಲದೆ ಕಟ್ಟಡ ಹಾಗು ಇತರೆ ನಿರ್ಮಾಣ ಕೂಲಿ ಕಾರ್ಮಿಕರ ಪರವಾಗಿ ಸಹ ನಿರಂತರವಾಗಿ ಶ್ರಮಿಸುತ್ತಿದ್ದಾರೆ. ಇವರ ಸೇವೆಯನ್ನು ಪರಿಗಣಿಸಿ ಈ ಪ್ರಶಸ್ತಿಯನ್ನು ನೀಡಲಾಗಿದೆ.
ಕರ್ನಾಟಕ ಗ್ರಾಮೀಣ ಮೂಲ ಸೌಕರ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಶಾಸಕ ಬಿ.ಕೆ ಸಂಗಮೇಶ್ವರ್, ಕರ್ನಾಟಕ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ವರ್ಗಗಳ ಅಲೆಮಾರಿ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಜಿ. ಪಲ್ಲವಿ, ಪೊಲೀಸ್ ಉಪಾಧೀಕ್ಷಕ ಪ್ರಕಾಶ್ ರಾಥೋಡ್, ನಗರಸಭೆ ಅಧ್ಯಕ್ಷೆ ಜೆ.ಸಿ ಗೀತಾರಾಜಕುಮಾರ್, ಉಪಾಧ್ಯಕ್ಷ ಬಷೀರ್ ಅಹಮದ್, ಸ್ಥಾಯಿ ಸಮಿತಿ ಅಧ್ಯಕ್ಷೆ ಪ್ರೇಮ ಬದರಿನಾರಾಯಣ, ಪೌರಾಯುಕ್ತ ಕೆ.ಎನ್ ಹೇಮಂತ್, ತಹಸೀಲ್ದಾರ್ ಪರುಸಪ್ಪ ಕುರುಬರ, ತಾಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಎಂ. ಆಶಾಲತ, ಸರ್ಕಾರದ ೫ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಬಿ.ಎಸ್ ಗಣೇಶ್, ನಗರ ಆಶ್ರಯ ಸಮಿತಿ ಅಧ್ಯಕ್ಷ ಬಿ.ಎಸ್ ಗೋಪಾಲ್, ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ತಾಲೂಕು ಅಧ್ಯಕ್ಷ ಬಿ. ಸಿದ್ದಬಸಪ್ಪ, ಹಿರಿಯ ಸದಸ್ಯ ಬಿ.ಕೆ ಮೋಹನ್ ಸೇರಿದಂತೆ ದಲಿತ ಸಂಘಟನೆಗಳ ಮುಖಂಡರು, ಮಹಿಳಾ ಸಂಘಟನೆಗಳ ಪ್ರಮುಖರು, ಸರ್ಕಾರದ ವಿವಿಧ ಇಲಾಖೆಗಳ ಅಧಿಕಾರಿಗಳು, ಸ್ಥಳೀಯ ಸಂಸ್ಥೆಗಳ ಜನಪ್ರತಿನಿಧಿಗಳು ಉಪಸ್ಥಿತರಿದ್ದರು.
ವಿನೋದ್‌ರವರಿಗೆ ಜನಪ್ರತಿನಿಧಿಗಳು, ವಿವಿಧ ಸಂಘ-ಸಂಸ್ಥೆಗಳ ಅಧ್ಯಕ್ಷರು, ಪದಾಧಿಕಾರಿಗಳು, ಮುಖಂಡರು, ಗಣ್ಯರು ಅಭಿನಂದಿಸಿದ್ದಾರೆ.
