ಸಹ ಪ್ರಾಧ್ಯಾಪಕ ಡಾ. ಎಸ್. ವರದರಾಜರಿಗೆ ಭಾರ ಎತ್ತುವ ಸ್ಪರ್ಧೆಯಲ್ಲಿ ಬೆಳ್ಳಿ ಪದಕ
ಡಾ. ಎಸ್. ವರದರಾಜ
ಭದ್ರಾವತಿ: ಬಹಳ ವರ್ಷಗಳವರೆಗೆ ನಗರದ ನ್ಯೂಟೌನ್ ಸರ್.ಎಂ.ವಿ ಸರ್ಕಾರಿ ಕಲಾ ಮತ್ತು ವಾಣಿಜ್ಯ ಕಾಲೇಜಿನಲ್ಲಿ ಸಹ ಪ್ರಾಧ್ಯಾಪಕರಾಗಿ ಕರ್ತವ್ಯ ನಿರ್ವಹಿಸಿ ಬೇರೆಡೆಗೆ ವರ್ಗಾವಣೆಗೊಂಡಿರುವ ಡಾ. ಎಸ್. ವರದರಾಜರವರು ತಮ್ಮ ಕ್ರೀಡಾ ಪ್ರತಿಭೆಯನ್ನು ಮುಂದುವರೆಸಿದ್ದು, ರಾಜ್ಯಮಟ್ಟದ ಭಾರ ಎತ್ತುವ ಸ್ಪರ್ಧೆಯಲ್ಲಿ ದ್ವಿತೀಯ ಸ್ಥಾನ ಪಡೆದುಕೊಂಡಿದ್ದಾರೆ.
ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದಿಂದ ಯುವ ಸಬಲೀಕರಣ ಕ್ರೀಡಾ ಇಲಾಖೆ ಸಹಯೋಗದೊಂದಿಗೆ ಆಯೋಜಿಸಲಾಗಿದ್ದ ರಾಜ್ಯ ಮಟ್ಟದ ಕ್ರೀಡಾಕೂಟದಲ್ಲಿ ಭಾಗವಹಿಸಿ ಪುರುಷರ ಭಾರ ಎತ್ತುವ ಸ್ಪರ್ಧೆಯ ೭೯ ಕೆ.ಜಿ. ದೇಹ ತೂಕ ವಿಭಾಗದಲ್ಲಿ ದ್ವಿತೀಯ ಸ್ಥಾನದೊಂದಿಗೆ ಬೆಳ್ಳಿ ಪದಕ ಪಡೆದು ರಾಷ್ಟ್ರಮಟ್ಟಕ್ಕೆ ಸ್ಪರ್ಧಿಸಲು ಅರ್ಹರಾಗಿರುತ್ತಾರೆ.
ವರದರಾಜರವರು ಕಳೆದ ೩ ವರ್ಷಗಳಿಂದ ರಾಷ್ಟ್ರಮಟ್ಟ ಹಾಗೂ ೧೨ ವರ್ಷಗಳಿಂದ ರಾಜ್ಯಮಟ್ಟದಲ್ಲಿ ಗೆಲವು ಸಾಧಿಸಿ ಪ್ರಶಸ್ತಿಗಳನ್ನು ತಮ್ಮದಾಗಿಸಿಕೊಳ್ಳುವ ಮೂಲಕ ವಿದ್ಯಾರ್ಥಿಗಳಿಗೆ ಸ್ಪೂರ್ತಿದಾಯಕರಾಗಿದ್ದು, ಇವರಿಗೆ ಕಾಲೇಜಿನ ಪ್ರಾಂಶುಪಾಲರು, ಬೋಧಕ, ಬೋಧಕೇತರ ಸಿಬ್ಬಂದಿಗಳು, ಗಣ್ಯರು ಅಭಿನಂದಿಸಿದ್ದಾರೆ.
ವರದರಾಜರವರು ಪ್ರಸ್ತುತ ಶಿವಮೊಗ್ಗ ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನ ಅರ್ಥಶಾಸ್ತ್ರ ವಿಭಾಗದಲ್ಲಿ ಸಹ ಪ್ರಾಧ್ಯಾಪಕರಾಗಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ.
