ಡಯಟ್ ಹಿರಿಯ ಉಪನ್ಯಾಸಕ ಎ.ಕೆ ನಾಗೇಂದ್ರಪ್ಪ ನಿವೃತ್ತಿ
ಶಿಕ್ಷಣ ಇಲಾಖೆ, ವಿವಿಧ ಸಂಘ-ಸಂಸ್ಥೆಗಳಿಂದ ಸನ್ಮಾನ, ಗೌರವ
ಭದ್ರಾವತಿಯಲ್ಲಿ ಸುಮಾರು ೪ ವರ್ಷಗಳ ಕಾಲ ಕ್ಷೇತ್ರ ಶಿಕ್ಷಣಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸಿ, ನಂತರ ಶಿವಮೊಗ್ಗ ಡಯಟ್ ಹಿರಿಯ ಉಪನ್ಯಾಸಕರಾಗಿ ಅಧಿಕಾರ ಸ್ವೀಕರಿಸಿ ೩ ದಿನಗಳ ಕರ್ತವ್ಯದೊಂದಿಗೆ ನಿವೃತ್ತಿ ಹೊಂದಿರುವ ಎ.ಕೆ ನಾಗೇಂದ್ರಪ್ಪ ಅವರನ್ನು ಸನ್ಮಾನಿಸಿ ಗೌರವಿಸಲಾಯಿತು.
ಭದ್ರಾವತಿ : ಸುಮಾರು ೪ ವರ್ಷಗಳ ಕಾಲ ಕ್ಷೇತ್ರ ಶಿಕ್ಷಣಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸಿ, ನಂತರ ಶಿವಮೊಗ್ಗ ಡಯಟ್ ಹಿರಿಯ ಉಪನ್ಯಾಸಕರಾಗಿ ಅಧಿಕಾರ ಸ್ವೀಕರಿಸಿ ೩ ದಿನಗಳ ಕರ್ತವ್ಯದೊಂದಿಗೆ ನಿವೃತ್ತಿ ಹೊಂದಿರುವ ಎ.ಕೆ ನಾಗೇಂದ್ರಪ್ಪ ಅವರನ್ನು ಸನ್ಮಾನಿಸಿ ಗೌರವಿಸಲಾಯಿತು.
ಕ್ಷೇತ್ರ ಶಿಕ್ಷಣಾಧಿಕಾರಿಯಾಗಿ ಫೆ.೨೮, ೨೦೨೨ರಂದು ಅಧಿಕಾರ ಸ್ವೀಕರಿಸಿದ್ದ ನಾಗೇಂದ್ರಪ್ಪ ಅವರು ಸಾಕಷ್ಟು ಸುಧಾರಣೆಗಳನ್ನು ಕೈಗೊಂಡಿದ್ದರು. ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಉತ್ತಮ ಫಲಿತಾಂಶ ಕಾಯ್ದುಕೊಳ್ಳಲು ಹೆಚ್ಚಿನ ಶ್ರಮವಹಿಸಿದ್ದರು. ಸರ್ಕಾರಿ ಶಾಲೆಗಳಿಗೆ ಮೂಲ ಸೌಕರ್ಯಗಳನ್ನು ಒದಗಿಸಿಕೊಡುವ ಹಾಗು ಖಾಸಗಿ ಶಾಲೆಗಳಿಗೆ ಪೈಪೋಟಿ ನೀಡುವಂತೆ ಅತ್ಯುತ್ತಮ ಶಿಕ್ಷಕ ವೃಂದವನ್ನು ಕಲ್ಪಿಸಿಕೊಡುವಲ್ಲಿ ಯಶಸ್ವಿಯಾಗಿದ್ದರು.
ಇವರ ಕರ್ತವ್ಯ ನಿರ್ವಹಣೆಗೆ ಹೆಚ್ಚಿನ ಪ್ರಶಂಸೆ ವ್ಯಕ್ತವಾಗಿತ್ತು. ವಯೋ ಸಹಜ ನಿವೃತ್ತಿ ಹೊಂದಿರುವ ಇವರನ್ನು ಸಿದ್ದಾರೂಢ ನಗರದ ಬಸವೇಶ್ವರ ಸಭಾ ಭವನದಲ್ಲಿ ಸನ್ಮಾನಿಸಿ ಗೌರವಿಸಲಾಯಿತು.
ಶಾಲಾ ಶಿಕ್ಷಣ ಮತ್ತು ಸಾಕ್ಷರತೆ ಇಲಾಖೆ ಹಾಗು ವಿವಿಧ ಸಂಘ-ಸಂಸ್ಥೆಗಳಿಂದ ಆಯೋಜಿಸಲಾಗಿದ್ದ ಕಾರ್ಯಕ್ರಮದಲ್ಲಿ ನಗರಸಭೆ ಅಧ್ಯಕ್ಷೆ ಜೆ.ಸಿ ಗೀತಾ ರಾಜಕುಮಾರ್, ಹಿರಿಯ ಸದಸ್ಯ ಬಿ.ಕೆ ಮೋಹನ್, ಪೌರಾಯುಕ್ತ ಕೆ.ಎನ್ ಹೇಮಂತ್, ಕ್ಷೇತ್ರ ಶಿಕ್ಷಣ ಸಂಪನ್ಮೂಲ ಸಮನ್ವಯಾಧಿಕಾರಿ ವಿ.ಎಚ್ ಪಂಚಾಕ್ಷರಿ, ಸರ್ಕಾರದ ೫ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ತಾಲೂಕು ಸಮಿತಿ ಅಧ್ಯಕ್ಷ ಬಿ.ಎಸ್ ಗಣೇಶ್, ಪಿಎಲ್‌ಡಿ ಬ್ಯಾಂಕ್ ಅಧ್ಯಕ್ಷ ಬಿ.ಕೆ ಶಿವಕುಮಾರ್, ಉದ್ಯಮಿ ಬಿ.ಕೆ ಜಗನ್ನಾಥ್, ಸರ್ಕಾರಿ ಪ್ರಾಥಮಿಕ ಶಾಲೆಗಳ ಸಂಘದ ಅಧ್ಯಕ್ಷ ಟಿ. ಪೃಥ್ವಿರಾಜ್, ಖಾಸಗಿ ಶಾಲೆಗಳ ಒಕ್ಕೂಟದ ತಾಲೂಕು ಅಧ್ಯಕ್ಷ ಡಿ. ಪ್ರಭಾಕರ ಬೀರಯ್ಯ, ಕನ್ನಡ ಸಾಹಿತ್ಯ ಪರಿಷತ್ ಜಿಲ್ಲಾಧ್ಯಕ್ಷ ಡಿ. ಮಂಜುನಾಥ್, ನಗರಸಭೆ ಮಾಜಿ ಅಧ್ಯಕ್ಷೆ ಎಂ.ಎಸ್ ಸುಧಾಮಣಿ, ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಎಸ್. ಕುಮಾರ್, ಮುಖಂಡರಾದ ಶಿವಬಸಪ್ಪ, ನಿವೃತ್ತ ಕ್ಷೇತ್ರ ಶಿಕ್ಷಣಾಧಿಕಾರಿ ಟಿ.ಎನ್ ಸೋಮಶೇಖರಯ್ಯ, ನ್ಯಾಯವಾದಿ ಎಂ. ಶಿವಕುಮಾರ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.
