ಸ್ಥಳೀಯ ಇಎಸ್‌ಐ ಆಸ್ಪತ್ರೆಯಲ್ಲಿ ಎಲ್ಲಾ ಸೌಲಭ್ಯ ಆತಂಕಕ್ಕೆ ಒಳಗಾಗದಿರಿ : ಶಾಸಕ ಸಂಗಮೇಶ್ವರ್
ಬೆಂಗಳೂರಿನಲ್ಲಿ ಕಾರ್ಮಿಕ ಮುಖಂಡರೊಂದಿಗೆ ಆಯುಕ್ತರ ಜೊತೆ ಚರ್ಚಿಸಿ ಭರವಸೆ
ಭದ್ರಾವತಿ ಶಾಸಕ ಬಿ.ಕೆ ಸಂಗಮೇಶ್ವರ್ ಕಾರ್ಮಿಕ ಮುಖಂಡರೊಂದಿಗೆ ಬೆಂಗಳೂರಿನಲ್ಲಿ ಕಾರ್ಮಿಕ ಇಲಾಖೆ ಆಯುಕ್ತರನ್ನು ಭೇಟಿ ಮಾಡಿ ಚರ್ಚೆ ನಡೆಸುವ ಮೂಲಕ ಮನವಿ ಸಲ್ಲಿಸಿ ಎಲ್ಲಾ ಸೌಲಭ್ಯಗಳು ಸ್ಥಳೀಯ ಇಎಸ್‌ಐ ಆಸ್ಪತ್ರೆಯಲ್ಲಿ ಲಭಿಸುವಂತೆ ಕ್ರಮ ಕೈಗೊಳ್ಳಬೇಕೆಂದು ಕೋರಿರುತ್ತಾರೆ.
ಭದ್ರಾವತಿ: ಇಎಸ್‌ಐ ಆಸ್ಪತ್ರೆಯಲ್ಲಿ ಹೊರರೋಗಿ ಚಿಕಿತ್ಸೆಗೆ ಸಾಮಾನ್ಯ ವೈದ್ಯರು ತಜ್ಞ ವೈದ್ಯರಿಗೆ ನೀಡುತ್ತಿದ್ದ ಉಲ್ಲೇಖಿತ ಪತ್ರ(ಓಪಿಡಿ) ಸೇರಿದಂತೆ ಎಲ್ಲಾ ಸೌಲಭ್ಯಗಳು ಸ್ಥಳೀಯ ಇಎಸ್‌ಐ ಆಸ್ಪತ್ರೆಯಲ್ಲಿ ಲಭಿಸಲಿವೆ. ಯಾವುದೇ ಕಾರಣಕ್ಕೂ ಆತಂಕಕ್ಕೆ ಒಳಗಾಗದಂತೆ ಶಾಸಕ ಬಿ.ಕೆ ಸಂಗಮೇಶ್ವರ್ ಕಾರ್ಮಿಕರಿಗೆ ಮನವಿ ಮಾಡಿದರು.
ಸ್ಥಳೀಯ ಇಎಸ್‌ಐ ಆಸ್ಪತ್ರೆಯಲ್ಲಿ ತಜ್ಞ ವೈದ್ಯರಿಗೆ ಉಲ್ಲೇಖಿತ ಪತ್ರ ಸೇರಿದಂತೆ ಇನ್ನಿತರ ಸೌಲಭ್ಯಗಳು ಸ್ಥಗಿತಗೊಳಿಸಿರುವ ಬಗ್ಗೆ ವಿಐಎಸ್‌ಎಲ್ ಗುತ್ತಿಗೆ ಕಾರ್ಮಿಕರ ಸಂಘಟನೆಗಳು ಹಾಗು ಕಾರ್ಮಿಕರ ಕ್ಷೇಮಾಭಿವೃದ್ಧಿ ಸಂಘದಿಂದ ಶಾಸಕ ಬಿ.ಕೆ ಸಂಗಮೇಶ್ವರ್‌ಗೆ ಮನವಿ ಸಲ್ಲಿಸಿ ಒತ್ತಾಯಿಸಲಾಗಿತ್ತು.
ಮನವಿಗೆ ಸ್ಪಂದಿಸಿದ ಶಾಸಕರು ಕಾರ್ಮಿಕ ಸಂಘಟನೆಗಳ ಮುಖಂಡರೊಂದಿಗೆ ಬೆಂಗಳೂರಿನಲ್ಲಿ ಕಾರ್ಮಿಕ ಇಲಾಖೆ ಆಯುಕ್ತರನ್ನು ಭೇಟಿ ಮಾಡಿ ಚರ್ಚೆ ನಡೆಸುವ ಮೂಲಕ ಮನವಿ ಸಲ್ಲಿಸಿ ಎಲ್ಲಾ ಸೌಲಭ್ಯಗಳು ಸ್ಥಳೀಯ ಇಎಸ್‌ಐ ಆಸ್ಪತ್ರೆಯಲ್ಲಿ ಲಭಿಸುವಂತೆ ಕ್ರಮ ಕೈಗೊಳ್ಳಬೇಕೆಂದು ಕೋರಿರುತ್ತಾರೆ. ಶಾಸಕರ ಕೋರಿಕೆಗೆ ಆಯುಕ್ತರು ಪೂರಕವಾಗಿ ಸ್ಪಂದಿಸಿದ್ದಾರೆಂದು ಕಾರ್ಮಿಕ ಸಂಘಟನೆಗಳ ಮುಖಂಡರು ತಿಳಿಸಿದ್ದಾರೆ.
ಬೇಡಿಕೆಗಳ ಈಡೇರಿಕೆಗೆ ಸ್ಪಂದಿಸಿರುವ ಶಾಸಕರಿಗೆ ಹಾಗು ಕಾರ್ಮಿಕ ಇಲಾಖೆ ಆಯುಕ್ತರಿಗೆ ಕಾರ್ಮಿಕರ ಸಂಘಟನೆಗಳ ಮುಖಂಡರು ಕೃತಜ್ಞತೆ ಸಲ್ಲಿಸಿದ್ದಾರೆ. ಪ್ರಮುಖರಾದ ವಿಐಎಸ್‌ಎಲ್ ಗುತ್ತಿಗೆ ಕಾರ್ಮಿಕರ ಸಂಘದ ಅಧ್ಯಕ್ಷ ಸುರೇಶ್, ಪದಾಧಿಕಾರಿಗಳಾದ ರಾಕೇಶ್, ಮಂಜುನಾಥ್, ವಿಐಎಸ್‌ಎಲ್ ಎಂಪ್ಲಾಯಿಸ್ ಅಸೋಸಿಯೇಷನ್(ಎಐಟಿಯುಸಿ ಸಂಯೋಜಿತ) ಗುತ್ತಿಗೆ ಕಾರ್ಮಿಕರ ಸಂಘದ ಪದಾಧಿಕಾರಿಗಳಾದ ಸತೀಶ್ ಅರುಣಾಚಲ, ಐಸಾಕ್, ಕಾರ್ಮಿಕರ ಕ್ಷೇಮಾಭಿವೃದ್ಧಿ ಸಂಘದ ಎಚ್.ಆರ್ ರಂಗನಾಥ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.
