ಬೃಹತ್ ರಕ್ತದಾನ ಶಿಬಿರ ಆಯೋಜನೆ : ಪತ್ರಕರ್ತರ ಸಂಘದ ಕಾರ್ಯಕ್ಕೆ ಶ್ಲಾಘನೆ


ಭದ್ರಾವತಿ ನ್ಯೂಟೌನ್ ಲಯನ್ಸ್ ಕ್ಲಬ್ ಸಭಾಂಗಣದಲ್ಲಿ ಆಯೋಜಿಸಲಾಗಿದ್ದ ಪತ್ರಿಕಾದಿನಾಚರಣೆ ಹಾಗು ಬೃಹತ್ ರಕ್ತದಾನ ಶಿಬಿರ ಕಾರ್ಯಕ್ರಮದ ಸಮಾರೋಪ ಸಮಾರಂಭ ಆರಂಭಕ್ಕೂ ಮೊದಲು ಎಂದು ಸರ್ಕಾರದ ೫ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ತಾಲೂಕು ಸಮಿತಿ ಅಧ್ಯಕ್ಷ ಬಿ.ಎಸ್ ಗಣೇಶ್ ಹಾಗು ನಗರಸಭೆ ಮಾಜಿ ಅಧ್ಯಕ್ಷೆ ಎಂ.ಎಸ್ ಸುಧಾಮಣಿ ರಕ್ತದಾನ ಮಾಡಿದರು. 
    ಭದ್ರಾವತಿ : ಸರ್ಕಾರಿ ಇಲಾಖೆ ಹಾಗು ವಿವಿಧ ಸಂಘ-ಸಂಸ್ಥೆಗಳ ಸಹಯೋಗದೊಂದಿಗೆ ಬೃಹತ್ ರಕ್ತದಾನ ಶಿಬಿರ ಆಯೋಜಿಸಿ ಯಶಸ್ವಿಗೊಳಿಸುವ ಮೂಲಕ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ತಾಲೂಕು ಘಟಕ ಇತರರಿಗೆ ಮಾದರಿಯಾಗಿದೆ ಎಂದು ಸರ್ಕಾರದ ೫ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ತಾಲೂಕು ಸಮಿತಿ ಅಧ್ಯಕ್ಷ ಬಿ.ಎಸ್ ಗಣೇಶ್ ಹೇಳಿದರು. 
    ಅವರು ನಗರದ ನ್ಯೂಟೌನ್ ಲಯನ್ಸ್ ಕ್ಲಬ್ ಸಭಾಂಗಣದಲ್ಲಿ ಆಯೋಜಿಸಲಾಗಿದ್ದ ಪತ್ರಿಕಾದಿನಾಚರಣೆ ಹಾಗು ಬೃಹತ್ ರಕ್ತದಾನ ಶಿಬಿರ ಕಾರ್ಯಕ್ರಮದ ಸಮಾರೋಪ ಸಮಾರಂಭದಲ್ಲಿ ಪಾಲ್ಗೊಂಡು ಮಾತನಾಡಿದರು. 
    ಪತ್ರಕರ್ತರ ಬದ್ದತೆ ಹಾಗು ಸಾಮಾಜಿಕ ಕಳಕಳಿಯನ್ನು ಪ್ರಶಂಸಿದರು. ಅಲ್ಲದೆ ಮುಂದಿನ ದಿನಗಳಲ್ಲಿ ಪತ್ರಕರ್ತರು ಕೈಗೊಳ್ಳುವ ಕಾರ್ಯಕ್ರಮಗಳಿಗೆ ಇನ್ನೂ ಹೆಚ್ಚಿನ ಸಹಕಾರ ನೀಡುವುದಾಗಿ ಭರವಸೆ ನೀಡಿದರು. ಇದಕ್ಕೂ ಮೊದಲು ರಕ್ತದಾನ ಮಾಡುವ ಮೂಲಕ ಯುವ ಸಮುದಾಯಕ್ಕೆ ರಕ್ತದಾನ ಮಾಡುವಂತೆ ಕರೆ ನೀಡಿದರು. 
    ತಾಲೂಕು ಘಟಕದ ಅಧ್ಯಕ್ಷ ಗಂಗಾನಾಯ್ಕ ಗೊಂದಿಯವರು ಅಧ್ಯಕ್ಷತೆವಹಿಸಿದ್ದರು. ನಗರಸಭೆ ಉಪಾಧ್ಯಕ್ಷ ಬಷೀರ್ ಅಹಮದ್, ಬಗರ್ ಹುಕುಂ ಸಮಿತಿ ತಾಲೂಕು ಅಧ್ಯಕ್ಷ ಎಸ್. ಮಣಿಶೇಖರ್, ನಗರಸಭೆ ಸದಸ್ಯರಾದ ಟಿಪ್ಪು ಸುಲ್ತಾನ್, ಅನುಪಮ ಚನ್ನೇಶ್, ಪೊಲೀಸ್ ಉಪಾಧೀಕ್ಷಕ ಪ್ರಕಾಶ್ ರಾಥೋಡ್ ಸೇರಿದಂತೆ ಇನ್ನಿತರರು ವೇದಿಕೆಯಲ್ಲಿ ಉಪಸ್ಥಿತರಿದ್ದರು. 
    ಅಪರಂಜಿ ಶಿವರಾಜ್ ಕಾರ್ಯಕ್ರಮ ನಿರೂಪಿಸಿದರು. ಪ್ರಧಾನ ಕಾರ್ಯದರ್ಶಿ ಬಸವರಾಜ್ ಸ್ವಾಗತಿಸಿ, ಕಿರಣ್ ಕುಮಾರ್ ವಂದಿಸಿದರು. ಶಿಬಿರಕ್ಕೆ ಸಹಕರಿಸಿದ ವಿವಿಧ ಸಂಘ-ಸಂಸ್ಥೆಗಳು, ಸರ್ಕಾರಿ ಇಲಾಖೆಗಳನ್ನು ಅಭಿನಂದಿಸಲಾಯಿತು.