೧೦ ಸಾವಿರು ರು. ಲಂಚ ಸ್ವೀಕರಿಸುತ್ತಿದ್ದ ಪ್ರಾಂಶುಪಾಲ ಲೋಕಾಯುಕ್ತ ಬಲೆಗೆ
20 ಸಾವಿರ ರು. ಲಂಚಕ್ಕೆ ಬೇಡಿಕೆ ಇಟ್ಟಿದ್ದ ನಾಮದೇವ್
ಭದ್ರಾವತಿಯಲ್ಲಿ ಲಂಚ ಸ್ವೀಕರಿಸುತ್ತಿದ್ದಾಗ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದ ಹುಣಸೆಕಟ್ಟೆ ಕಿತ್ತೂರು ರಾಣಿ ಚನ್ನಮ್ಮ ವಸತಿ ಶಾಲೆಯ ಪ್ರಾಂಶಪಾಲ ನಾಮದೇವ್.
ಭದ್ರಾವತಿ: ತಾಲೂಕಿನ ಹುಣಸೆಕಟ್ಟೆ ಕಿತ್ತೂರು ರಾಣಿ ಚನ್ನಮ್ಮ ವಸತಿ ಶಾಲೆಯ ಪ್ರಾಂಶಪಾಲ ಲಂಚ ಸ್ವೀಕರಿಸುತ್ತಿದ್ದಾಗ ಲೋಕಾಯುಕ್ತ ಪೊಲೀಸರ ಬಲೆಗೆ ಸಿಕ್ಕಿ ಬಿದ್ದಿರುವ ಘಟನೆ ಸೋಮವಾರ ನಡೆದಿದೆ.
ತಾಲೂಕಿನ ತಿಪ್ಲಾಪುರ ಕ್ಯಾಂಪ್ ನಿವಾಸಿ, ಎಳನೀರು ವ್ಯಾಪಾರಿ ಸಿ. ಮೇಘರಾಜ್ ಅವರು ತಮ್ಮ ಪುತ್ರಿ ದೀಕ್ಷಾ ಅವರನ್ನು ವಸತಿ ಶಾಲೆಯ ೭ನೇ ತರಗತಿಗೆ ದಾಖಲಿಸಲು ಪ್ರಾಂಶುಪಾಲರನ್ನು ಸಂಪರ್ಕಿಸಿದ್ದರು. ಈ ವೇಳೆ ಶಾಲೆಗೆ ಡ್ರಮ್ ಸೆಟ್ ಖರೀದಿಸುವ ನೆಪವೊಡ್ಡಿದ ಪ್ರಾಂಶುಪಾಲ ನಾಮದೇವ್ ದಾಖಲಾತಿ ಪ್ರಕ್ರಿಯೆ ಪೂರ್ಣಗೊಳಿಸಲು ೨೦ ಸಾವಿರ ಲಂಚಕ್ಕೆ ಬೇಡಿಕೆ ಇಟ್ಟಿದ್ದಾರೆ ಎನ್ನಲಾಗಿದೆ.
ಈ ಸಂಬಂಧ ಮೇಘರಾಜ್ ಅವರು ಜು. ೧೮ರಂದು ಶಿವಮೊಗ್ಗ ಲೋಕಾಯುಕ್ತ ಪೊಲೀಸ್ ಠಾಣೆಗೆ ದೂರು ಸಲ್ಲಿಸಿ, ಪ್ರಾಂಶುಪಾಲನ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ಮನವಿ ಮಾಡಿದ್ದರು. ದೂರಿನ ಆಧಾರದ ಮೇಲೆ ಲೋಕಾಯುಕ್ತ ಪೊಲೀಸರು ಭ್ರಷ್ಟಾಚಾರ ಪ್ರತಿಬಂಧಕ ಕಾಯ್ದೆ-೧೯೮೮ (ತಿದ್ದುಪಡಿ-೨೦೧೮)ರ ಕಲಂ ೭(೩) ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದರು.
ಜು.೨೦ರಂದು ಮಧ್ಯಾಹ್ನ ಸುಮಾರು ೧೨.೨೦ರ ಸಮಯದಲ್ಲಿ ಪ್ರಾಂಶುಪಾಲ ನಾಮದೇವ್ ಶಾಲೆಯ ಕೊಠಡಿಯಲ್ಲೇ ಮೇಘರಾಜ್ ಅವರಿಂದ ಮೊದಲ ಕಂತಿನ ರೂಪದಲ್ಲಿ ೧೦ ಸಾವಿರ ರು. ಲಂಚ ಸ್ವೀಕರಿಸುತ್ತಿದ್ದ ವೇಳೆ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿ ಲಂಚದ ಹಣದ ಜೊತೆಗೆ ವಶಕ್ಕೆಪಡೆದು ಮುಂದಿನ ಕಾನೂನು ಕ್ರಮ ಕೈಗೊಂಡಿದ್ದಾರೆ.
ಶಿವಮೊಗ್ಗ ಲೋಕಾಯುಕ್ತ ಪೊಲೀಸ್ ಅಧೀಕ್ಷಕ ಎಂ.ಎಸ್. ಕೌಲಾಪೂರೆ ಅವರ ಮಾರ್ಗದರ್ಶನದಲ್ಲಿ ಪೊಲೀಸ್ ಉಪಾಧೀಕ್ಷಕ ಬಿ.ಪಿ. ಚಂದ್ರಶೇಖರ್ ನೇತೃತ್ವದಲ್ಲಿ ಲೋಕಾಯುಕ್ತ ಪೊಲೀಸ್ ಇನ್ಸ್‌ಪೆಕ್ಟರ್ ಕೆ.ಪಿ ರುದ್ರೇಶ್ ಕಾರ್ಯಾಚರಣೆ ನಡೆಸಿ ಪ್ರಕರಣದ ತನಿಖೆ ಕೈಗೊಂಡಿದ್ದಾರೆ. ಲೋಕಾಯುಕ್ತ ಪೊಲೀಸ್ ಠಾಣೆ ನಿರೀಕ್ಷಕ ವೀರಬಸಪ್ಪ ಎಲ್. ಕುಸಲಾಪುರ ಸೇರಿದಂತೆ ಸಿಬ್ಬಂದಿ ವರ್ಗದವರು ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು.
