ಸರ್ಕಾರಿ ಅಧಿಕಾರಿಗಳು ಸಾಧ್ಯವಾದಷ್ಟು ಬಡವರ ಪರವಾಗಿ ಕಾರ್ಯನಿರ್ವಹಿಸಿ
ಭದ್ರಾವತಿಯಲ್ಲಿ ಶಾಸಕ ಬಿ.ಕೆ ಸಂಗಮೇಶ್ವರ್ ಭಾನುವಾರ ಹಳೇನಗರದ ಕನಕಮಂಟಪ ಮೈದಾನದಲ್ಲಿ ಆಯೋಜಿಸಲಾಗಿದ್ದ ಸಾಮಾಜಿಕ ಯೋಜನೆಯಡಿಯಲ್ಲಿ ಬರುವ ವಿವಿಧ ಪಿಂಚಣಿ ಯೋಜನೆಗಳಿಂದ ವಂಚಿತರಾದ ಹಾಗು ಸ್ಥಗಿತಗೊಂಡಿರುವವರ ಪಿಂಚಣಿ ಕುಂದು-ಕೊರತೆಗಳ ಸಮಾವೇಶ ಉದ್ಘಾಟಿಸಿ ಮಾತನಾಡಿದರು.
ಭದ್ರಾವತಿ: ಸರ್ಕಾರಿ ಅಧಿಕಾರಿಗಳು ತಮ್ಮ ಅಧಿಕಾರ ವ್ಯಾಪ್ತಿಯಲ್ಲಿ ಸಾಧ್ಯವಾದಷ್ಟು ಬಡವರ ಪರವಾಗಿ ಕಾರ್ಯನಿರ್ವಹಿಸುವ ಮೂಲಕ ಅವರ ಸಂಕಷ್ಟಗಳಿಗೆ ಸ್ಪಂದಿಸಬೇಕೆಂದು ಶಾಸಕ ಬಿ.ಕೆ ಸಂಗಮೇಶ್ವರ್ ಮನವಿ ಮಾಡಿದರು.
ಅವರು ಭಾನುವಾರ ಹಳೇನಗರದ ಕನಕಮಂಟಪ ಮೈದಾನದಲ್ಲಿ ಆಯೋಜಿಸಲಾಗಿದ್ದ ಸಾಮಾಜಿಕ ಯೋಜನೆಯಡಿಯಲ್ಲಿ ಬರುವ ವಿವಿಧ ಪಿಂಚಣಿ ಯೋಜನೆಗಳಿಂದ ವಂಚಿತರಾದ ಹಾಗು ಸ್ಥಗಿತಗೊಂಡಿರುವವರ ಪಿಂಚಣಿ ಕುಂದು-ಕೊರತೆಗಳ ಸಮಾವೇಶ ಉದ್ಘಾಟಿಸಿ ಮಾತನಾಡಿದರು.
ಸರ್ಕಾರದ ವಿವಿಧ ಯೋಜನೆಯಡಿ ಪಿಂಚಣಿ ಪಡೆಯಲು ಅರ್ಹ ಫಲಾನುಭವಿಗಳು ಮಂತ್ರಿಗಳು, ಸಂಸದರು, ಶಾಸಕರ ಅಥವಾ ದೊಡ್ಡ ದೊಡ್ಡ ಅಧಿಕಾರಿಗಳ ಬಳಿ ಅಲೆದಾಡುವುದು ಬೇಡ. ಎಲ್ಲಾ ರೀತಿಯ ಪಿಂಚಣಿಗಳ ಸಮಸ್ಯೆಗಳನ್ನು ಸ್ಥಳೀಯವಾಗಿ ಬಗೆಹರಿಸುವ ನಿಟ್ಟಿನಲ್ಲಿ ಪ್ರಾಮಾಣಿಕವಾಗಿ ಪ್ರಯತ್ನಿಸಲಾಗುತ್ತಿದೆ ಎಂದರು.
ಬಡ ವರ್ಗದವರಿಗೆ ಯಾವುದೇ ರೀತಿ ತೊಂದರೆಯಾಗಬಾರದೆಂಬ ಉದ್ದೇಶದೊಂದಿಗೆ ಸಮಾವೇಶ ಆಯೋಜಿಸಲಾಗಿದೆ. ಇದರ ಸದುಪಯೋಗ ಪಡೆದುಕೊಳ್ಳಬೇಕೆಂದು ಮನವಿ ಮಾಡಿದರು.
ನಗರಸಭೆ ಹಿರಿಯ ಸದಸ್ಯ ಬಿ.ಕೆ ಮೋಹನ್ ಮಾತನಾಡಿ, ಕ್ಷೇತ್ರದಲ್ಲಿ ವಿವಿಧ ಯೋಜನೆಯಡಿ ಪಿಂಚಣಿ ಪಡೆಯುತ್ತಿರುವವರ ಸಮಸ್ಯೆಗಳು ಹೆಚ್ಚಿನದ್ದಾಗಿವೆ. ಇದನ್ನು ಮನಗಂಡು ಕ್ಷೇತ್ರದಲ್ಲಿನ ಪಿಂಚಣಿದಾರರು ತಹಸೀಲ್ದಾರ್ ಅವರನ್ನು ನೇರವಾಗಿ ಸಂಪರ್ಕಿಸಿ ತಮ್ಮ ಸಮಸ್ಯೆಗಳನ್ನು ಹೇಳಿಕೊಳ್ಳುವ ಮೂಲಕ ಬಗೆಹರಿಸಿಕೊಳ್ಳುವಂತೆ ನೆರವಾಗಲು ಸಮಾವೇಶವನ್ನು ಆಯೋಜಿಸಲಾಗಿದೆ. ಬಡವರ್ಗದವರು ಯಾವುದೇ ಮಧ್ಯವರ್ತಿಗಳಿಗೆ ಲಂಚ ನೀಡಬೇಕಿಲ್ಲ. ಅಧಿಕಾರಿಗಳ ಜೊತೆ ಕಾರ್ಯಕರ್ತರು ಎಲ್ಲವನ್ನು ಉಚಿತವಾಗಿ ಮಾಡಿಕೊಡಲಿದ್ದಾರೆ ಎಂದರು.
ಸರ್ಕಾರದ ೫ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ತಾಲೂಕು ಸಮಿತಿ ಅಧ್ಯಕ್ಷ ಬಿ.ಎಸ್ ಗಣೇಶ್, ಬ್ಲಾಕ್ ಕಾಂಗ್ರೆಸ್ ನಗರ ಘಟಕದ ಅಧ್ಯಕ್ಷ ಎಸ್. ಕುಮಾರ್ ಸೇರಿದಂತೆ ಇನ್ನಿತರರು ಮಾತನಾಡಿದರು.
ತಹಸೀಲ್ದಾರ್ ಪ್ರದೀಪ್ ದೇವಗಿರಿ, ನಗರಸಭೆ ಪೌರಾಯುಕ್ತ ಕೆ.ಎನ್ ಹೇಮಂತ್, ತಾಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಆಶಾಲತಾ, ನಗರಸಭೆ ಉಪಾಧ್ಯಕ್ಷ ಬಷೀರ್ ಅಹಮದ್, ಪಿಎಲ್‌ಡಿ ಬ್ಯಾಂಕ್ ಅಧ್ಯಕ್ಷ ಬಿ.ಕೆ ಶಿವಕುಮಾರ್, ತಾಲೂಕು ಆಶ್ರಯ ಸಮಿತಿ ಅಧ್ಯಕ್ಷ ಎಸ್. ಮಣಿಶೇಖರ್, ಪ್ರಮುಖರಾದ ಎಚ್. ರವಿಕುಮಾರ್, ವಿ. ಕದಿರೇಶ್, ಸಿ.ಎಂ ಖಾದರ್, ಧರ್ಮಕುಮಾರ್ ಸೇರಿದಂತೆ ಸರ್ಕಾರದ ವಿವಿಧ ಇಲಾಖೆಗಳ ಅಧಿಕಾರಿಗಳು, ಸಂಘ-ಸಂಸ್ಥೆಗಳ ಪ್ರಮುಖರು ಉಪಸ್ಥಿತರಿದ್ದರು.
