ಎಸ್‌ಐಆರ್ ಕುರಿತು ಸಮಗ್ರ ಮಾಹಿತಿ ತ್ವರಿತವಾಗಿ ಕಾರ್ಯ ನಿರ್ವಹಿಸಿ : ನವೀದ್ ಅಹಮದ್ ಪರ್ವೇಜ್
ಭದ್ರಾವತಿ ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ಎಸ್‌ಐಆರ್-ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ ಕಾರ್ಯಚಟುವಟಿಕೆಗಳಿಗೆ ಸಂಬಂಧಿಸಿದ ಕಾರ್ಯಾಗಾರ ಆಯೋಜಿಸಲಾಗಿತ್ತು.
ಭದ್ರಾವತಿ : ಮತಗಟ್ಟೆ ಅಧಿಕಾರಿಗಳು ಪ್ರತಿ ಮನೆ ಮನೆಗೆ ತೆರಳಿ ಎಸ್‌ಐಆರ್-ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ ಕುರಿತು ಮತದಾರರಲ್ಲಿರುವ ಗೊಂದಲಗಳನ್ನು ಬಗೆಹರಿಸುವ ಮೂಲಕ ತ್ವರಿತವಾಗಿ ಪರಿಷ್ಕರಣೆ ಕಾರ್ಯ ಕೈಗೊಳ್ಳಬೇಕೆಂದು ಸ್ವೀಪ್ ಕಾರ್ಯಕ್ರಮದ ರಾಜ್ಯಮಟ್ಟದ ತರಬೇತುದಾರ ನವೀದ್ ಅಹಮದ್ ಪರ್ವೇಜ್ ಕರೆ ನೀಡಿದರು.
ಅವರು ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ಆಯೋಜಿಸಲಾಗಿದ್ದ ಎಸ್‌ಐಆರ್-ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ ಕಾರ್ಯಚಟುವಟಿಕೆಗಳಿಗೆ ಸಂಬಂಧಿಸಿದ ಕಾರ್ಯಾಗಾರದಲ್ಲಿ ಪಾಲ್ಗೊಂಡು ಮಾಹಿತಿ ನೀಡಿದರು.
ಯಾವುದೇ ಅರ್ಹ ಮತದಾರರು ಮತದಾನದ ಹಕ್ಕಿನಿಂದ ವಂಚಿತರಾಗಬಾರದು. ಈ ನಿಟ್ಟಿನಲ್ಲಿ ಚುನಾವಣಾ ಆಯೋಗ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ ಕೈಗೊಂಡಿದ್ದು, ಯುವ ಮತದಾರರು ಸಕ್ರಿಯವಾಗಿ ಪಾಲ್ಗೊಳ್ಳುವ ಮೂಲಕ ಅರ್ಹರೆಲ್ಲರೂ ಮತದಾನದ ಹಕ್ಕನ್ನು ಪಡೆದುಕೊಳ್ಳಬೇಕು. ಅರ್ಹ ನಾಗರಿಕರೆಲ್ಲರನ್ನೂ ಮತದಾರರ ಪಟ್ಟಿಗೆ ಸೇರ್ಪಡೆಗೊಳಿಸುವುದು ಮತ್ತು ಹಾಲಿ ಮತದಾರರ ವಿವರಗಳನ್ನು ಖಚಿತಪಡಿಸಿಕೊಳ್ಳುವುದು ಈ ಅಭಿಯಾನದ ಮುಖ್ಯ ಉದ್ದೇಶವಾಗಿದೆ ಎಂದರು.
ಎಸ್‌ಐಆರ್ ಕುರಿತು ಸಮಗ್ರ ಮಾಹಿತಿಯನ್ನು ಮತಗಟ್ಟೆ ಅಧಿಕಾರಿಗಳಿಗೆ ನೀಡಿ ಆಯೋಗ ನಿಗದಿಪಡಿಸಿರುವ ದಿನಾಂಕದೊಳಗೆ ಮುಕ್ತಾಯಗೊಳಿಸಲು ಹೆಚ್ಚಿನ ಶ್ರಮವಹಿಸಬೇಕೆಂದರು. ತಾಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಆಶಾಲತಾ ಮಾತನಾಡಿ, ಮತಗಟ್ಟೆ ಅಧಿಕಾರಿಗಳು ಎಸ್‌ಐಆರ್ ಸಂಬಂಧಿಸಿದಂತೆ ಯಾವುದೇ ಸಮಸ್ಯೆಗಳು ಎದುರಾದಲ್ಲಿ ಸಂಬಂಧಿಸಿದ ಉನ್ನತ ಅಧಿಕಾರಿಗಳಿಂದ ಸೂಕ್ತ ಮಾರ್ಗದರ್ಶನ ಪಡೆದುಕೊಂಡು ಪರಿಹಸಿಕೊಳ್ಳಬೇಕೆಂದು ಸಲಹೆ ನೀಡಿದರು.
ದೊಣಬಘಟ್ಟ ಪದವಿಪೂರ್ವ ಕಾಲೇಜಿನ ಉಪನ್ಯಾಸಕ ರುದ್ರೇಶ್, ಕ್ಷೇತ್ರ ಶಿಕ್ಷಣಾಧಿಕಾರಿ ಸುರೇಶ್ ಹಾಗು ಕ್ಷೇತ್ರ ಶಿಕ್ಷಣ ಸಂಪನ್ಮೂಲ ಸಮನ್ವಯಾಧಿಕಾರಿ ಎಚ್.ವಿ ಪಂಚಾಕ್ಷರಿ, ತಾಲೂಕು ಪಂಚಾಯಿತಿ ಅಧಿಕಾರಿ ಉಪೇಂದ್ರ ಬಾಬು ಸೇರಿದಂತೆ ಇನ್ನಿತರರು ಮಾತನಾಡಿದರು.

.jpeg)