ಆ.೧೨ರಂದು ತಾಲೂಕು ಕಛೇರಿ ಮುಂಭಾಗ ಬೃಹತ್ ಪ್ರತಿಭಟನಾ ಧರಣಿ



    ಭದ್ರಾವತಿ : ಕ್ಷೇತ್ರದಲ್ಲಿ ಹೆಚ್ಚುತ್ತಿರುವ ಕೊಲೆ, ಸುಲಿಗೆ, ದರೋಡೆ, ಗೂಂಡಾಗಿರಿ ಸೇರಿದಂತೆ ಕಾನೂನುಬಾಹಿರ ಕೃತ್ಯಗಳ  ಹಾಗು ಓಸಿ ಮಟ್ಕಾ, ಇಸ್ಪೀಟ್ ಸೇರಿದಂತೆ ಇನ್ನಿತರ ದಂಧೆಗಳ ವಿರುದ್ಧ ಕೆಲವು ದಿನಗಳ ಹಿಂದೆ ಬಿಜೆಪಿ ಪಕ್ಷದಿಂದ ಪೊಲೀಸ್ ಉಪಾಧೀಕ್ಷಕರ ಕಛೇರಿಗೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಲಾಗಿತ್ತು. ಇದೀಗ ಆ.೧೨ರಂದು ಬೆಳಿಗ್ಗೆ ೧೦.೩೦ಕ್ಕೆ ಭದ್ರಾವತಿ ಉಳಿಸಿ ಹೋರಾಟ ವೇದಿಕೆಯಿಂದ ತಾಲೂಕು ಕಛೇರಿ ಮುಂಭಾಗ ಬೃಹತ್ ಪ್ರತಿಭಟನಾ ಧರಣಿ ಹಮ್ಮಿಕೊಳ್ಳಲಾಗಿದೆ. 
    ಶಾಸಕರ ಕುಟುಂಬದ ಪ್ರಭಾವಕ್ಕೆ ಒಳಗಾಗಿ ಸುಳ್ಳು ಪ್ರಕರಣ ದಾಖಲಿಸುವ ಹಾಗು ಅಕ್ರಮಗಳಿಗೆ ಬೆಂಬಲ ನೀಡುವ ತಪ್ಪಿತಸ್ಥ ಪೊಲೀಸ್ ಅಧಿಕಾರಿಗಳ ವಿರುದ್ಧ ತಕ್ಷಣ ಶಿಸ್ತುಕ್ರಮ ಜರುಗಿಸುವುದು. ಪೊಲೀಸ್ ಉಮೇಶ್ ಹಾಗು ಅವರ ಅಣ್ಣನ ಮಗನ ವಿರುದ್ಧ ದಾಖಲಿಸಲಾಗಿರುವ ಪ್ರಕರಣಗಳನ್ನು ತಕ್ಷಣವೇ ಹಿಂಪಡೆಯಬೇಕು. ಕ್ಷೇತ್ರದಲ್ಲಿ ನಡೆಯುತ್ತಿರುವ ನಕಲಿ ನಿವೇಶನ ದಾಖಲೆ ಸೃಷ್ಟಿ ಹಾಗು ಗೂಂಡಾಗಿರಿ ತಕ್ಷಣ ನಿಲ್ಲಿಸುವಂತೆ ಆಗ್ರಹಿಸಿ ಮತ್ತು ಜಿಲ್ಲಾ ಪೊಲೀಸ್ ಅಧೀಕ್ಷಕರು ಖುದ್ದಾಗಿ ಪ್ರತಿಭಟನಾ ಧರಣಿ ಸ್ಥಳಕ್ಕೆ ಭೇಟಿ ನೀಡಿ ಅಹವಾಲು ಸ್ವೀಕರಿಸುವಂತೆ ಒತ್ತಾಯಿಸಿ ಪ್ರತಿಭಟನಾ ಧರಣಿ ಹಮ್ಮಿಕೊಳ್ಳಲಾಗಗಿದೆ. 
    ಅರುಣ್ ಕುಮಾರ್ ನೇತೃತ್ವದಲ್ಲಿ ಪ್ರತಿಭಟನಾ ಧರಣಿ ನಡೆಯುತ್ತಿದ್ದು, ಸ್ಥಳೀಯ ಸಂಸ್ಥೆಗಳ ಜನಪ್ರತಿನಿಧಿಗಳು, ಸಂಘ-ಸಂಸ್ಥೆಗಳು, ಮಹಿಳೆಯರು, ವಿದ್ಯಾರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಯಶಸ್ವಿಗೊಳಿಸುವಂತೆ ಕೋರಲಾಗಿದೆ.