ಪೊಲೀಸ್ ಅಧಿಕಾರಿಗಳೆಂದು ನಂಬಿಸಿ ದರೋಡೆ ಮಾಡುತ್ತಿದ್ದ ಇಬ್ಬರು ಅಂತರಾಜ್ಯ ದರೋಡೆಕೋರರ ಬಂಧನ

ಆಂಧ್ರಪ್ರದೇಶದ ಇಬ್ಬರಿಂದ ೪.೩೫ ಲಕ್ಷ ರು. ಮೌಲ್ಯದ ಚಿನ್ನದ ಸರ ವಶಪಡಿಸಿಕೊಂಡ ಪೇಪರ್‌ಟೌನ್ ಪೊಲೀಸರು  


ಪೊಲೀಸ್ ಅಧಿಕಾರಿಗಳೆಂದು ನಂಬಿಸಿ ಒಂಟಿಯಾಗಿ ತೆರಳುತ್ತಿದ್ದ ಮಹಿಳೆಯರಿಂದ ಚಿನ್ನಾಭರಣ ದೋಚುತ್ತಿದ್ದ ಆಂಧ್ರಪ್ರದೇಶ ಮೂಲದ ಇಬ್ಬರು ಅಂತರಾಜ್ಯ ದರೋಡೆಕೋರರನ್ನು ಭದ್ರಾವತಿ ಪೇಪರ್ ಟೌನ್ ಠಾಣೆ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. 
    ಭದ್ರಾವತಿ: ಪೊಲೀಸ್ ಅಧಿಕಾರಿಗಳೆಂದು ನಂಬಿಸಿ ಒಂಟಿಯಾಗಿ ತೆರಳುತ್ತಿದ್ದ ಮಹಿಳೆಯರಿಂದ ಚಿನ್ನಾಭರಣ ದೋಚುತ್ತಿದ್ದ ಆಂಧ್ರಪ್ರದೇಶ ಮೂಲದ ಇಬ್ಬರು ಅಂತರಾಜ್ಯ ದರೋಡೆಕೋರರನ್ನು ಪೇಪರ್ ಟೌನ್ ಠಾಣೆ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. 
    ಬಂಧಿತರನ್ನು ಆಂಧ್ರಪ್ರದೇಶದ ಸೈಯದ್ ಅಬ್ಬಾಸ್ ಅಲಿ ಹಾಗೂ ಹುಸೇನ್ ಬಾಷಾ ಎಂದು ಗುರುತಿಸಲಾಗಿದೆ. ಆರೋಪಿಗಳಿಂದ ಸುಮಾರು ೪.೩೫ ಲಕ್ಷ ರು. ಮೌಲ್ಯದ ೪೦ ಗ್ರಾಂ. ಚಿನ್ನದ ಸರ ವಶಪಡಿಸಿಕೊಳ್ಳಲಾಗಿದೆ.  
    ಠಾಣಾ ವ್ಯಾಪ್ತಿಯ ತಿಮ್ಲಾಪುರ ರಸ್ತೆಯಲ್ಲಿ ಮಹಿಳೆಯೊಬ್ಬರು ಏಕಾಂಗಿಯಾಗಿ ನಡೆದುಕೊಂಡು ಹೋಗುತ್ತಿದ್ದಾಗ ದ್ವಿಚಕ್ರ ವಾಹನದಲ್ಲಿ ಬಂದ ಇಬ್ಬರು ವ್ಯಕ್ತಿಗಳು ಆಕೆಯನ್ನು ಅಡ್ಡಗಟ್ಟಿದ್ದರು. ತಾವು ಕರ್ತವ್ಯದಲ್ಲಿರುವ ಪೊಲೀಸ್ ಸಿಬ್ಬಂದಿ ಎಂದು ಪರಿಚಯಿಸಿಕೊಂಡಿದ್ದರು.  ಆಕೆಯಿಂದ ಉಪಾಯವಾಗಿ ಕೊರಳಲ್ಲಿದ್ದ ಚಿನ್ನದ ಸರವನ್ನು ಬಿಚ್ಚಿಸಿಕೊಂಡು ಕ್ಷಣಾರ್ಧದಲ್ಲಿ ಪರಾರಿಯಾಗಿದ್ದರು.
    ಈ ಸಂಬಂಧ ಸಂತ್ರಸ್ತೆ ನೀಡಿದ ದೂರಿನ ಮೇರೆಗೆ ಬಿಎನ್‌ಎಸ್ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡ ಪೊಲೀಸರು ಆರೋಪಿಗಳ ಪತ್ತೆಗೆ ವಿಶೇಷ ತನಿಖಾ ತಂಡ ರಚಿಸಿದ್ದರು.
    ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಬಿ. ನಿಖಿಲ್ ಹಾಗೂ ಹೆಚ್ಚುವರಿ ವರಿಷ್ಠಾಧಿಕಾರಿ ಎ.ಜಿ ಕಾರಿಯಪ್ಪ  ಅವರ ಮಾರ್ಗದರ್ಶನದಲ್ಲಿ ಪೊಲೀಸ್ ಉಪಾಧೀಕ್ಷಕ ಪ್ರಕಾಶ್ ರಾಠೋಡ್ ನೇತೃತ್ವದ ತಂಡ ಕಾರ್ಯಾಚರಣೆ ನಡೆಸಿ ಇಬ್ಬರು ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದೆ.