ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ : ೩ ವರ್ಷ ಕಠಿಣ ಜೈಲು ಶಿಕ್ಷೆ, ೩೧ ಸಾವಿರ ರು. ದಂಡ
ಭದ್ರಾವತಿ : ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಪ್ರಕರಣದಲ್ಲಿ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಶಿವಮೊಗ್ಗ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಯುವಕನೊಬ್ಬನಿಗೆ ೩ ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆ ಹಾಗೂ ೩೧,೦೦೦ ರು.ದಂಡ ವಿಧಿಸಿ ತೀರ್ಪು ನೀಡಿದೆ.
೨೦೨೪ರಲ್ಲಿ ತಾಲೂಕಿನ ೨೦ ವರ್ಷದ ಯುವಕನೊಬ್ಬ ೧೬ ವರ್ಷದ ಬಾಲಕಿಯೊಂದಿಗೆ ಗೆಳೆತನ ಬೆಳೆಸಿ, ಆಕೆಗೆ ಲೈಂಗಿಕ ಕಿರುಕುಳ ನೀಡಿದ್ದನು. ಸಂತ್ರಸ್ತೆ ನೀಡಿದ ದೂರಿನ ಮೇರೆಗೆ ಪೇಪರ್‌ಟೌನ್ ಪೊಲೀಸ್ ಠಾಣೆಯಲ್ಲಿ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಿಸಿ ತನಿಖೆ ನಡೆಸಲಾಗಿತ್ತು.
ಆ ವೇಳೆ ಪ್ರಕರಣದ ತನಿಖಾಧಿಕಾರಿಯಾಗಿದ್ದ ಠಾಣಾ ಉಪ ನಿರೀಕ್ಷಕಿ ಇ. ಕವಿತಾ ಅವರು ಅಗತ್ಯ ಸಾಕ್ಷ್ಯಾಧಾರಗಳನ್ನು ಸಂಗ್ರಹಿಸಿ ನ್ಯಾಯಾಲಯಕ್ಕೆ ದೋಷಾರೋಪಣಾ ಪಟ್ಟಿ (ಚಾರ್ಜ್‌ಶೀಟ್) ಸಲ್ಲಿಸಿದ್ದರು.
ಪ್ರಕರಣದ ವಿಚಾರಣೆ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದಲ್ಲಿ ನಡೆದಿದ್ದು, ನ್ಯಾಯಾಧೀಶ ನಿಂಗನಗೌಡ ಪಾಟೀಲ್ ಅವರು ಶಿಕ್ಷೆ ವಿಧಿಸಿ ತೀರ್ಪು ನೀಡಿದ್ದಾರೆ. ಸರ್ಕಾರಿ ಅಭಿಯೋಜಕ ಶ್ರೀಧರ್ ಅವರು ಸರ್ಕಾರದ ಪರವಾಗಿ ವಾದ ಮಂಡಿಸಿದರು.
