ಅಪಾಯದ ಅಂಚಿನಲ್ಲಿರುವ ಶಾಲೆಯಿಂದ ಹೊರಗುಳಿದ ಮಕ್ಕಳನ್ನು ಮುಖ್ಯವಾಹಿನಿಗೆ ಕರೆ ತನ್ನಿ
ಎರಡು ದಿನಗಳ ಜಾಗೃತಿ ಅಭಿಯಾನಕ್ಕೆ ಚಾಲನೆ, ದೊಣಬಘಟ್ಟದ ೩೬ ಮನೆಗಳಿಗೆ ಅಧಿಕಾರಿಗಳ ತಂಡ ಭೇಟಿ
`ಮಿಷನ್ ಸುರಕ್ಷಾ ಅಭಿಯಾನ'ದಡಿ ಭದ್ರಾವತಿ ತಾಲೂಕಿನಾದ್ಯಂತ ಹಮ್ಮಿಕೊಳ್ಳಲಾಗಿರುವ `ಶಾಲೆಯಿಂದ ಹೊರಗುಳಿದ ಮಕ್ಕಳನ್ನು ಮರಳಿ ಶಾಲೆಗೆ ಸೇರಿಸುವ ಎರಡು ದಿನಗಳ ಜಾಗೃತಿ ಅಭಿಯಾನಕ್ಕೆ ತಾಲೂಕಿನ ದೊಣಬಘಟ್ಟ ಗ್ರಾಮದಲ್ಲಿ ಬುಧವಾರ ಜಿಲ್ಲಾ ಮಕ್ಕಳ ಕಲ್ಯಾಣ ಸಮಿತಿ ಅಧ್ಯಕ್ಷ ತಾಜುದ್ದೀನ್ ಖಾನ್ ಚಾಲನೆ ನೀಡಿದರು.
ಭದ್ರಾವತಿ: ಶಿಕ್ಷಣದಿಂದ ದೂರವಾದ ಮಕ್ಕಳು ಬಾಲಕಾರ್ಮಿಕತೆ, ಬಾಲ್ಯವಿವಾಹ, ದೈಹಿಕ ದೌರ್ಜನ್ಯ, ವಿವಿಧ ರೀತಿಯ ಶೋಷಣೆ ಹಾಗೂ ಮಾದಕ ವ್ಯಸನದಂತಹ ಅಪಾಯಗಳಿಗೆ ಒಳಗಾಗುವ ಸಾಧ್ಯತೆ ಹೆಚ್ಚಿದೆ. ಈ ಹಿನ್ನಲೆಯಲ್ಲಿ ಯಾವುದೇ ಮಗು ಶಿಕ್ಷಣದಿಂದ ವಂಚಿತವಾಗದಂತೆ ಪ್ರತಿಯೊಬ್ಬ ಮಗುವನ್ನು ಶಾಲೆಗೆ ಮರಳಿ ಸೇರಿಸಿ, ಮುಖ್ಯವಾಹಿನಿಗೆ ತರುವ ಜವಾಬ್ದಾರಿ ಎಲ್ಲರ ಮೇಲಿದೆ ಎಂದು ಜಿಲ್ಲಾ ಮಕ್ಕಳ ಕಲ್ಯಾಣ ಸಮಿತಿ ಅಧ್ಯಕ್ಷ ತಾಜುದ್ದೀನ್ ಖಾನ್ ಹೇಳಿದರು.
ಶಾಲೆಯಿಂದ ಹೊರಗುಳಿದ ೧೮ ವರ್ಷ ಒಳಗಿನ ಎಲ್ಲಾ ಮಕ್ಕಳನ್ನು ಗುರುತಿಸಿ, ಅವರನ್ನು ಮರಳಿ ಶಾಲೆಗೆ ಸೇರಿಸುವ ಉದ್ದೇಶದಿಂದ ತಾಲೂಕು ಆಡಳಿತ ಹಾಗೂ ತಾಲೂಕು ಪಂಚಾಯಿತಿ, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ಜಿಲ್ಲಾ ಮಕ್ಕಳ ರಕ್ಷಣಾ ಘಟಕ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಪೊಲೀಸ್ ಇಲಾಖೆ ಹಾಗು ಕ್ಷೇತ್ರ ಸಮನ್ವಯಾಧಿಕಾರಿಗಳ ಕಛೇರಿ ವತಿಯಿಂದ `ಮಿಷನ್ ಸುರಕ್ಷಾ ಅಭಿಯಾನ'ದಡಿ ತಾಲೂಕಿನಾದ್ಯಂತ ಹಮ್ಮಿಕೊಳ್ಳಲಾಗಿರುವ `ಶಾಲೆಯಿಂದ ಹೊರಗುಳಿದ ಮಕ್ಕಳನ್ನು ಮರಳಿ ಶಾಲೆಗೆ ಸೇರಿಸುವ ಎರಡು ದಿನಗಳ ಜಾಗೃತಿ ಅಭಿಯಾನಕ್ಕೆ ತಾಲೂಕಿನ ದೊಣಬಘಟ್ಟ ಗ್ರಾಮದಲ್ಲಿ ಬುಧವಾರ ಚಾಲನೆ ನೀಡಿ ಮಾತನಾಡಿದರು.
ತಾಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಎಂ. ಆಶಾಲತಾ ಮಾತನಾಡಿ, ಗ್ರಾಮ ಪಂಚಾಯಿತಿ ಮಟ್ಟದಲ್ಲಿರುವ ಮಕ್ಕಳ ರಕ್ಷಣಾ ವ್ಯವಸ್ಥೆ ಹಾಗೂ ಸಮಿತಿಗಳನ್ನು ಮತ್ತಷ್ಟು ಬಲಪಡಿಸಬೇಕು. ವಿವಿಧ ಇಲಾಖೆಗಳ ಅಧಿಕಾರಿಗಳು ಶಾಲೆಯಿಂದ ಹೊರಗುಳಿದ ಮಕ್ಕಳ ಮನೆಗಳಿಗೆ ಕಡ್ಡಾಯವಾಗಿ ಭೇಟಿ ನೀಡಿ, ಮಕ್ಕಳ ಪರಿಸ್ಥಿತಿ, ಶಿಕ್ಷಣದಿಂದ ಹೊರಗುಳಿಯಲು ಕಾರಣ ಹಾಗೂ ಕೈಗೊಂಡ ಕ್ರಮಗಳ ಕುರಿತು ಸಮಗ್ರ ವರದಿ ಸಲ್ಲಿಸಬೇಕು ಎಂದು ಸೂಚಿಸಿದರು.
ತಾಲೂಕಿನ ೩೯ ಗ್ರಾಮ ಪಂಚಾಯಿತಿಗಳ ವ್ಯಾಪ್ತಿಯಲ್ಲಿ ಒಟ್ಟು ೨೯೬ ಮಕ್ಕಳು ಶಾಲೆಯಿಂದ ಹೊರಗುಳಿದಿರುವುದು ಗುರುತಿಸಲಾಗಿದ್ದು, ಎರಡು ದಿನಗಳ ಜಾಗೃತಿ ಅಭಿಯಾನದಲ್ಲಿ ಈ ಮಕ್ಕಳ ಮನೆಗಳಿಗೆ ಅಧಿಕಾರಿಗಳ ತಂಡ ಭೇಟಿ ನೀಡಿ ಮಕ್ಕಳು ಹಾಗೂ ಪೋಷಕರ ಮನವೊಲಿಸಿ ಶಾಲೆಗೆ ಮರುಸೇರ್ಪಡೆಗೊಳಿಸುವ ಕಾರ್ಯ ಕೈಗೊಳ್ಳುತ್ತಿದೆ.
`ಮಿಷನ್ ಸುರಕ್ಷಾ ಅಭಿಯಾನ'ದಡಿ ಭದ್ರಾವತಿ ತಾಲೂಕಿನಾದ್ಯಂತ ಹಮ್ಮಿಕೊಳ್ಳಲಾಗಿರುವ `ಶಾಲೆಯಿಂದ ಹೊರಗುಳಿದ ಮಕ್ಕಳನ್ನು ಮರಳಿ ಶಾಲೆಗೆ ಸೇರಿಸುವ ಎರಡು ದಿನಗಳ ಜಾಗೃತಿ ಅಭಿಯಾನಕ್ಕೆ ತಾಲೂಕಿನ ದೊಣಬಘಟ್ಟ ಗ್ರಾಮದಲ್ಲಿ ಬುಧವಾರ ಜಿಲ್ಲಾ ಮಕ್ಕಳ ಕಲ್ಯಾಣ ಸಮಿತಿ ಅಧ್ಯಕ್ಷ ತಾಜುದ್ದೀನ್ ಖಾನ್ ಚಾಲನೆ ನೀಡಿ ಗ್ರಾಮದ ಶಾಲೆಯಿಂದ ಹೊರಗುಳಿದ ೩೬ ಮಕ್ಕಳ ಮನೆಗಳಿಗೆ ಅಧಿಕಾರಿಗಳ ತಂಡ ಭೇಟಿ ನೀಡಿ ಮಕ್ಕಳನ್ನು ಶಾಲೆಗೆ ಸೇರ್ಪಡೆಗೊಳಿಸುವಂತೆ ಮನವಿ ಮಾಡಿತು.
೩೬ ಮಕ್ಕಳ ಮನೆಗಳಿಗೆ ಅಧಿಕಾರಿಗಳ ಭೇಟಿ:
ದೊಣಬಘಟ್ಟ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಗುರುತಿಸಲಾಗಿದ್ದ ಶಾಲೆಯಿಂದ ಹೊರಗುಳಿದ ೩೬ ಮಕ್ಕಳ ಮನೆಗಳಿಗೆ ಅಧಿಕಾರಿಗಳ ತಂಡ ಭೇಟಿ ನೀಡಿ ಮಕ್ಕಳು ಮತ್ತು ಪೋಷಕರೊಂದಿಗೆ ಸಮಾಲೋಚನೆ ನಡೆಸಿತು. ಶಿಕ್ಷಣದ ಮಹತ್ವ, ಮಕ್ಕಳ ಹಕ್ಕುಗಳು ಹಾಗೂ ಶಿಕ್ಷಣದಿಂದ ವಂಚಿತರಾಗುವುದರಿಂದ ಎದುರಾಗಬಹುದಾದ ಅಪಾಯಗಳ ಕುರಿತು ಪೋಷಕರಿಗೆ ಅರಿವು ಮೂಡಿಸಿ ಮಕ್ಕಳನ್ನು ಕಡ್ಡಾಯವಾಗಿ ಶಾಲೆಗೆ ಕಳುಹಿಸುವಂತೆ ಮನವಿ ಮಾಡಿತು.
ಈ ಸಂದರ್ಭದಲ್ಲಿ ೯ನೇ ತರಗತಿಯಿಂದ ಶಾಲೆಯಿಂದ ಹೊರಗುಳಿದಿದ್ದ ಇಬ್ಬರು ಸಹೋದರಿಯರನ್ನು ರಕ್ಷಿಸಿ, ಮಕ್ಕಳ ಕಲ್ಯಾಣ ಸಮಿತಿಯ ಮೂಲಕ ಸರ್ಕಾರಿ ಬಾಲಕಿಯರ ಬಾಲಮಂದಿರಕ್ಕೆ ದಾಖಲಿಸಲಾಯಿತು. ಮಕ್ಕಳಿಗೆ ಶಿಕ್ಷಣದ ಅವಕಾಶ ಕಲ್ಪಿಸುವುದು ಪೋಷಕರ ಪ್ರಮುಖ ಜವಾಬ್ದಾರಿಯಾಗಿದ್ದು, ಉದ್ದೇಶಪೂರ್ವಕವಾಗಿ ಮಕ್ಕಳನ್ನು ಶಿಕ್ಷಣದಿಂದ ವಂಚಿಸಿದಲ್ಲಿ ಸಂಬಂಧಪಟ್ಟವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಅಧಿಕಾರಿಗಳ ತಂಡ ಎಚ್ಚರಿಕೆ ನೀಡಿತು.
`ಮಿಷನ್ ಸುರಕ್ಷಾ ಅಭಿಯಾನ'ದ ಮೂಲಕ ಶಾಲೆಯಿಂದ ಹೊರಗುಳಿದ ಮಕ್ಕಳನ್ನು ಕೇವಲ ಗುರುತಿಸುವುದಷ್ಟೇ ಅಲ್ಲದೆ, ಅವರ ಕುಟುಂಬದ ಸಾಮಾಜಿಕ ಹಾಗೂ ಆರ್ಥಿಕ ಪರಿಸ್ಥಿತಿಯನ್ನು ಅರಿತು, ಅಗತ್ಯವಿರುವ ಕಡೆ ಶಿಕ್ಷಣ, ರಕ್ಷಣೆ ಮತ್ತು ಪುನರ್ವಸತಿ ಸೌಲಭ್ಯಗಳನ್ನು ಒದಗಿಸುವ ಮೂಲಕ `ಪ್ರತಿ ಮಗು ಶಾಲೆಯಲ್ಲಿ-ಪ್ರತಿ ಮಗು ಸುರಕ್ಷಿತವಾಗಿ' ಎಂಬ ಆಶಯವನ್ನು ಸಾಕಾರಗೊಳಿಸುವ ನಿಟ್ಟಿನಲ್ಲಿ ತಾಲೂಕು ಆಡಳಿತ ಮುಂದಾಗಿದೆ.
ಜಾಗೃತಿ ಅಭಿಯಾನದಲ್ಲಿ ಶಿಶು ಅಭಿವೃದ್ಧಿ ಯೋಜನಾಧಿಕಾರಿ ಈರಪ್ಪ, ಕ್ಷೇತ್ರ ಶಿಕ್ಷಣಾಧಿಕಾರಿ ಕೆ.ಸಿ ಸುರೇಶ್, ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಅಧಿಕಾರಿಗಳಾದ ರಮೇಶ್ ಶೃತಿ, ಶಿಕ್ಷಣ ಇಲಾಖೆ ಮತ್ತು ಪೊಲೀಸ್ ಇಲಾಖೆ ಅಧಿಕಾರಿಗಳು, ಅಭಿವೃದ್ಧಿ ಅಧಿಕಾರಿಗಳಾದ ಕುಮಾರ್, ಶಾಲಾ ಶಿಕ್ಷಕರು ಹಾಗೂ ವಿವಿಧ ಇಲಾಖೆಗಳ ಸಿಬ್ಬಂದಿ ಭಾಗವಹಿಸಿದ್ದರು.

.jpeg)