ವಾಲ್ಮೀಕಿ ಜಯಂತಿ ವ್ಯವಸ್ಥಿತವಾಗಿ ಆಚರಿಸಿ


ಭದ್ರಾವತಿ ನಗರಸಭೆ ಸಭಾಂಗಣದಲ್ಲಿ ಮಹರ್ಷಿ ವಾಲ್ಮೀಕಿ ಜಯಂತಿ ಅಂಗವಾಗಿ ಪೂರ್ವಭಾವಿ ನಡೆಸಲಾಯಿತು. ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ಅಧ್ಯಕ್ಷರಾದ ತಹಸೀಲ್ದಾರ್ ಪ್ರದೀಪ್ ದೇವಗಿರಿ ಸಭೆ ಅಧ್ಯಕ್ಷತೆವಹಿಸಿದ್ದರು.

ಭದ್ರಾವತಿ: ಈ ಬಾರಿ ಮಹರ್ಷಿ ವಾಲ್ಮೀಕಿ ಜಯಂತಿ ವ್ಯವಸ್ಥಿತವಾಗಿ ನಡೆಸುವ ನಿಟ್ಟಿನಲ್ಲಿ ಸಮಾಜ ಕಲ್ಯಾಣ ಇಲಾಖೆ ಹೆಚ್ಚಿನ ಗಮನ ನೀಡಬೇಕೆಂದು ವಾಲ್ಮೀಕಿ ಸಮಾಜದ ಪ್ರಮುಖರು ಹಾಗು ಇನ್ನಿತರ ದಲಿತ ಸಂಘಟನೆಗಳ ಮುಖಂಡರು ಆಗ್ರಹಿಸಿದರು.

    ನಗರಸಭೆ ಸಭಾಂಗಣದಲ್ಲಿ ಆಯೋಜಿಸಲಾಗಿದ್ದ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದ ಸಮಾಜದ ಪ್ರಮುಖರು, ಡಾ. ಬಿ.ಆರ್ ಅಂಬೇಡ್ಕರ್ ಭವನದಲ್ಲಿ ಮಹರ್ಷಿ ವಾಲ್ಮೀಕಿ ಜಯಂತಿ ಆಚರಿಸಬೇಕು. ಕಾರ್ಯಕ್ರಮ ಸಂಬಂಧ ಹೆಚ್ಚಿನ ಪ್ರಚಾರ ಕೈಗೊಳ್ಳುವ ಜೊತೆಗೆ ಸರ್ಕಾರದ ನಿಯಮಾನುಸಾರ ವೇದಿಕೆ ಮೇಲೆ ಅತಿಥಿ, ಗಣ್ಯರನ್ನು ಆಹ್ವಾನಿಸಬೇಕು. ಪ್ರತಿಭಾವಂತ ವಿದ್ಯಾರ್ಥಿಗಳು, ವಿವಿಧ ಕ್ಷೇತ್ರದ ಸಾಧಕರನ್ನು ಸನ್ಮಾನಿಸಿ ಗೌರವಿಸಬೇಕೆಂದರು.

    ಕೆಲವು ದಲಿತ ಸಂಘಟನೆ ಮುಖಂಡರು ಮಾತನಾಡಿ, ನಗರದಲ್ಲಿ ವಾಲ್ಮೀಕಿ ಸಮುದಾಯ ಭವನ ಪೂರ್ಣಗೊಂಡಿದೆ. ವಾಲ್ಮೀಕಿ ಜಯಂತಿಯಂದು ಭವನ ಉದ್ಘಾಟಿಸುವುದು ಸೂಕ್ತ. ಮುಖ್ಯಮಂತ್ರಿ ಅಥವಾ ಉಪಮುಖ್ಯಮಂತ್ರಿ ಅಥವಾ ಸಚಿವರ ಆಹ್ವಾನಕ್ಕಾಗಿ ವಿಳಂಬ ಮಾಡಬಾರದು. ಉದ್ಘಾಟನೆಗೆ ಸಿದ್ದತೆ ಮಾಡಿಕೊಳ್ಳಿ. ಒಂದು ವೇಳೆ ಕಾರ್ಯಕ್ರಮಕ್ಕೆ ಬರುವವರು ಬರುತ್ತಾರೆ ಎಂದು ಸಲಹೆ ವ್ಯಕ್ತಪಡಿಸಿದರು.

     ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕ ಶಿವಕುಮಾರ್ ಮಾತನಾಡಿ, ಕಾರ್ಯಕ್ರಮದಲ್ಲಿ ಯಾವುದೇ ರೀತಿ ಲೋಪದೋಷಗಳು ಬಾರದಂತೆ ಎಚ್ಚರವಹಿಸುವುದಾಗಿ ತಿಳಿಸಿದರು. ಅಲ್ಲದೆ ನಗರದ ಸರ್ಕಾರದ ಎಲ್ಲಾ ಇಲಾಖೆಗಳು, ಸಂಘ-ಸಂಸ್ಥೆಗಳು ಕಾರ್ಯಕ್ರಮ ಯಶಸ್ವಿಗೊಳಿಸುವ ನಿಟ್ಟಿನಲ್ಲಿ ಸಹಕಾರ ನೀಡಬೇಕೆಂದು ಕೋರಿದರು.

    ಸಭೆಯಲ್ಲಿ ತಹಸೀಲ್ದಾರ್ ಪ್ರದೀಪ್ ದೇವಗಿರಿ, ತಾಲೂಕು ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಆಶಾಲತಾ, ನಗರಸಭೆ ಪೌರಾಯುಕ್ತ ಕೆ.ಎನ್ ಹೇಮಂತ್, ಕ್ಷೇತ್ರ ಶಿಕ್ಷಣಾಧಿಕಾರಿ ಕೆ.ಸಿ ಸುರೇಶ್, ನಗರ ಪೊಲೀಸ್ ವೃತ್ತ ನಿರೀಕ್ಷಕಿ ಕೆ. ನಾಗಮ್ಮ ಉಪಸ್ಥಿತರಿದ್ದರು.