ಅ.೪ರಂದು ೨ ಸಾವಿರ ಕಟ್ಟಡ ಕಾರ್ಮಿಕರಿಗೆ ಕಿಟ್ ವಿತರಣೆ


    ಭದ್ರಾವತಿ : ಕ್ಷೇತ್ರದಲ್ಲಿ ಕಾರ್ಮಿಕರ ಸಂಖ್ಯೆ ಹೆಚ್ಚಿನದ್ದಾಗಿದ್ದು, ಎಲ್ಲಾ ವರ್ಗದ ಕಾರ್ಮಿಕರು ಇದ್ದಾರೆ. ಈ ಪೈಕಿ ಅಸಂಘಟಿತ ಕಾರ್ಮಿಕರು ಹೆಚ್ಚು ಸಂಕಷ್ಟಕ್ಕೆ ಒಳಗಾಗಿದ್ದಾರೆ. ಕ್ಷೇತ್ರದಲ್ಲಿ ಇವರಿಗೆ ಸರ್ಕಾರದಿಂದ ಸಿಗಬಹುದಾದ ಸೌಲಭ್ಯಗಳನ್ನು ಸಮಪರ್ಕವಾಗಿ ಕಲ್ಪಿಸಿಕೊಡಲಾಗುತ್ತಿದೆ. ಈ ನಿಟ್ಟಿನಲ್ಲಿ ಸ್ಥಳೀಯ ಜನಪ್ರತಿನಿಧಿಗಳು, ಕಾರ್ಮಿಕ ಸಂಘಟನೆಗಳೊಂದಿಗೆ ಕಾರ್ಮಿಕ ಇಲಾಖೆ ಸಕ್ರಿಯವಾಗಿ ಕಾರ್ಯ ನಿರ್ವಹಿಸುತ್ತಿದೆ. ಅ.೪ರಂದು ಸುಮಾರು ೨ ಸಾವಿರ ನೋಂದಾಯಿತ ಕಟ್ಟಡ ಕಾರ್ಮಿಕರಿಗೆ ಕಾರ್ಮಿಕ ಇಲಾಖೆಯ ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಲ್ಯಾಣ ಮಂಡಳಿಯಿಂದ ಕಿಟ್‌ಗಳನ್ನು ವಿತರಿಸಲಾಗುತ್ತಿದೆ.

    ನಗರದ ಬೈಪಾಸ್ ರಸ್ತೆ, ಉಜ್ಜನಿಪುರ, ಕಾರ್ಮಿಕರ ಭವನದಲ್ಲಿ ಬೆಳಿಗ್ಗೆ ೧೧ ಗಂಟೆಗೆ ವೇದಿಕೆ ಕಾರ್ಯಕ್ರಮ ಆರಂಭಗೊಳ್ಳಲಿದ್ದು, ಕರ್ನಾಟಕ ಗ್ರಾಮೀಣ ಮೂಲ ಸೌಕರ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಶಾಸಕ ಬಿ.ಕೆ ಸಂಗಮೇಶ್ವರ್ ಅಧ್ಯಕ್ಷತೆವಹಿಸಲಿದ್ದಾರೆ.

     ಸರ್ಕಾರದ ೫ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ತಾಲೂಕು ಅಧ್ಯಕ್ಷ ಬಿ.ಎಸ್ ಗಣೇಶ್ ಹಾಗು ಕಾರ್ಮಿಕ ಇಲಾಖೆ ಮತ್ತು ಕಲ್ಯಾಣ ಮಂಡಳಿ ಅಧಿಕಾರಿಗಳು ಪಾಲ್ಗೊಳ್ಳಲಿದ್ದಾರೆ. ಅಲ್ಲದೆ ಕ್ಷೇತ್ರದಲ್ಲಿ ಸುಮಾರು ೧೫ ಕಾರ್ಮಿಕ ಸಂಘಟನೆಗಳಿದ್ದು, ಸಂಘಟನೆಗಳ ಮುಖಂಡರು, ಪದಾಧಿಕಾರಿಗಳು ಸೇರಿದಂತೆ ಇನ್ನಿತರರು ಉಪಸ್ಥಿತರಿರುವರು. ಎಲ್ಲಾ ನೋಂದಾಯಿತ ಕಟ್ಟಡ ಕಾರ್ಮಿಕರು ಪಾಲ್ಗೊಳ್ಳುವ ಮೂಲಕ ಯಶಸ್ವಿಗೊಳಿಸುವಂತೆ ಕಾರ್ಮಿಕ ಇಲಾಖೆ ಎರಡನೇ ವೃತ್ತದ ನಿರೀಕ್ಷಕ ರಕ್ಷಿತ್ ಕೋರಿದ್ದಾರೆ.