ಎಸ್‌ಐಆರ್ ಕುರಿತು ಸಮಗ್ರ ಮಾಹಿತಿ ತ್ವರಿತವಾಗಿ ಕಾರ್ಯ ನಿರ್ವಹಿಸಿ : ನವೀದ್ ಅಹಮದ್ ಪರ್ವೇಜ್
ಭದ್ರಾವತಿ ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ಎಸ್‌ಐಆರ್-ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ ಕಾರ್ಯಚಟುವಟಿಕೆಗಳಿಗೆ ಸಂಬಂಧಿಸಿದ ಕಾರ್ಯಾಗಾರ ಆಯೋಜಿಸಲಾಗಿತ್ತು. ಭದ್ರಾವತಿ : ಮತಗಟ್ಟೆ ಅಧಿಕಾರಿಗಳು ಪ್ರತಿ ಮನೆ ಮನೆಗೆ ತೆರಳಿ ಎಸ್‌ಐಆರ್-ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ ಕುರಿತು ಮತದಾರರಲ್ಲಿರುವ ಗೊಂದಲಗಳನ್ನು ಬಗೆಹರಿಸುವ ಮೂಲಕ ತ್ವರಿತವಾಗಿ ಪರಿಷ್ಕರಣೆ ಕಾರ್ಯ ಕೈಗೊಳ್ಳಬೇಕೆಂದು ಸ್ವೀಪ್ ಕಾರ್ಯಕ್ರಮದ ರಾಜ್ಯಮಟ್ಟದ ತರಬೇತುದಾರ ನವೀದ್ ಅಹಮದ್ ಪರ್ವೇಜ್ ಕರೆ ನೀಡಿದರು. ಅವರು ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ಆಯೋಜಿಸಲಾಗಿದ್ದ ಎಸ್‌ಐಆರ್-ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ ಕಾರ್ಯಚಟುವಟಿಕೆಗಳಿಗೆ ಸಂಬಂಧಿಸಿದ ಕಾರ್ಯಾಗಾರದಲ್ಲಿ ಪಾಲ್ಗೊಂಡು ಮಾಹಿತಿ ನೀಡಿದರು. ಯಾವುದೇ ಅರ್ಹ ಮತದಾರರು ಮತದಾನದ ಹಕ್ಕಿನಿಂದ ವಂಚಿತರಾಗಬಾರದು. ಈ ನಿಟ್ಟಿನಲ್ಲಿ ಚುನಾವಣಾ ಆಯೋಗ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ ಕೈಗೊಂಡಿದ್ದು, ಯುವ ಮತದಾರರು ಸಕ್ರಿಯವಾಗಿ ಪಾಲ್ಗೊಳ್ಳುವ ಮೂಲಕ ಅರ್ಹರೆಲ್ಲರೂ ಮತದಾನದ ಹಕ್ಕನ್ನು ಪಡೆದುಕೊಳ್ಳಬೇಕು. ಅರ್ಹ ನಾಗರಿಕರೆಲ್ಲರನ್ನೂ ಮತದಾರರ ಪಟ್ಟಿಗೆ ಸೇರ್ಪಡೆಗೊಳಿಸುವುದು ಮತ್ತು ಹಾಲಿ ಮತದಾರರ ವಿವರಗಳನ್ನು ಖಚಿತಪಡಿಸಿಕೊಳ್ಳುವುದು ಈ ಅಭಿಯಾನದ ಮುಖ್ಯ ಉದ್ದೇಶವಾಗಿದೆ ಎಂದರು. ...