Wednesday, June 17, 2020

ಬೀದಿ ನಾಯಿಗಳಿಗೆ ಸಂತಾನ ಹರಣ ಶಸ್ತ್ರ ಚಿಕಿತ್ಸೆ

ಭದ್ರಾವತಿ ನಗರಸಭೆ ವ್ಯಾಪ್ತಿಯಲ್ಲಿ ಬೀದಿ ನಾಯಿಗಳ ಹಾವಳಿ ಹೆಚ್ಚಾಗಿರುವ ಹಿನ್ನಲೆಯಲ್ಲಿ ಬೀದಿ ನಾಯಿಗಳನ್ನು ಹಿಡಿದು ಸಂತಾನ ಹರಣ ಶಸ್ತ್ರ ಚಿಕಿತ್ಸೆ ನೆರವೇರಿಸಲಾಗುತ್ತಿದೆ. 
ಭದ್ರಾವತಿ, ಜೂ. ೧೭: ನಗರಸಭೆ ವ್ಯಾಪ್ತಿಯಲ್ಲಿ ಬೀದಿ ನಾಯಿಗಳ ಹಾವಳಿ ನಿಯಂತ್ರಿಸಲು ನಗರಸಭೆ ಆಡಳಿತ ಮುಂದಾಗಿದ್ದು, ಈ ನಿಟ್ಟಿನಲ್ಲಿ ಬೀದಿ ನಾಯಿಗಳಿಗೆ ಸಂತಾನ ಹರಣ ಶಸ್ತ್ರ ಚಿಕಿತ್ಸೆಗೆ ಬುಧವಾರ ಚಾಲನೆ ನೀಡಿದೆ. 
ಕಳೆದ ಕೆಲವು ದಿನಗಳ ಹಿಂದೆ ಬೀದಿ ನಾಯಿಗಳ ಹಾವಳಿ ಹೆಚ್ಚಾದ ಹಿನ್ನಲೆಯಲ್ಲಿ ಹುತ್ತಾಕಾಲೋನಿ ಮನೆಯೊಂದರಲ್ಲಿ ಸುಮಾರು ೭ ಕುರಿಗಳು ಬಲಿಯಾಗಿದ್ದವು. ಈ ಹಿನ್ನಲೆಯಲ್ಲಿ ಎಚ್ಚೆದ್ದುಕೊಂಡಿರುವ ನಗರಸಭೆ ಆಡಳಿತ ಹುತ್ತಾಕಾಲೋನಿ ಮತ್ತು ಜಿಂಕ್‌ಲೈನ್  ವ್ಯಾಪ್ತಿಯಲ್ಲಿ ಬೀದಿ ನಾಯಿಗಳನ್ನು ಹಿಡಿದು ಅವುಗಳಿಗೆ ಸಂತಾನ ಹರಣ ಚಿಕಿತ್ಸೆ ಮಾಡಲಾಗುತ್ತಿದೆ. 
    ತರೀಕೆರೆ ರಸ್ತೆಯಲ್ಲಿರುವ ನೀರು ಶುದ್ಧೀಕರಣ ಘಟಕದಲ್ಲಿ ಸುಮಾರು ೧೫ ಬೀದಿ ನಾಯಿಗಳಿಗೆ ಸಂತಾನ ಹರಣ ಚಿಕಿತ್ಸೆ ನೆರವೇರಿಸಲಾಗಿದ್ದು, ಗುಣಮುಖಗೊಂಡ ನಂತರ ಪುನಃ ಬಿಡುಗಡೆ ಮಾಡಲಿದ್ದಾರೆ. 
ನಗರಸಭೆ ಪೌರಾಯುಕ್ತ ಮನೋಹರ್, ಪರಿಸರ ಅಭಿಯಂತರ ರುದ್ರೇಗೌಡ, ಶಸ್ತ್ರ ಚಿಕಿತ್ಸೆ ತಜ್ಞರು, ಸಿಬ್ಬಂದಿಗಳು ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು. 

ಲಡಾಖ್ ಗಡಿಯಲ್ಲಿ ಹುತಾತ್ಮರಾದ ವೀರ ಯೋಧರಿಗೆ ಸಂತಾಪ

ಬಿ.ಕೆ ಸಂಗಮೇಶ್ವರ್ 
ಭದ್ರಾವತಿ, ಜೂ. ೧೭: ಲಡಾಖ್ ಗಡಿಯಲ್ಲಿ ಭಾರತ ಮತ್ತು ಚೀನಾ ಸೈನಿಕರ ನಡುವೆ ಉಂಟಾಗಿರುವ ಸಂಘರ್ಷದಲ್ಲಿ ಹುತಾತ್ಮರಾದ ಭಾರತೀಯ ಯೋಧರಿಗೆ ಶಾಸಕ ಬಿ.ಕೆ ಸಂಗಮೇಶ್ವರ್ ಸಂತಾಪ ಸೂಚಿಸಿದ್ದಾರೆ. 
ದೇಶವನ್ನು ಅತಿಕ್ರಮಣ ಮಾಡುತ್ತಿರುವ ಚೀನಾ ದೇಶದ ಸೈನಿಕರ ವಿರುದ್ಧ ನಮ್ಮ ದೇಶದ ಸೈನಿಕರು ಹೋರಾಟ ನಡೆಸಿ ಹುತಾತ್ಮರಾಗಿರುವುದು ನೋವಿನ ಸಂಗತಿಯಾಗಿದೆ. ವೀರ ಯೋಧರ ಕುಟುಂಬ ವರ್ಗದವರಿಗೆ ದುಃಖವನ್ನು ಭರಿಸುವ ಶಕ್ತಿಯನ್ನು ಭಗವಂತ ಕರುಣಿಸಲೆಂದು ಪ್ರಾರ್ಥಿಸುತ್ತೇನೆ. 
ಚೀನಾ ಆರ್ಥಿಕವಾಗಿ ಸದೃಢವಾಗಲು ಭಾರತ ದೇಶ ಕಾರಣವಾಗಿದ್ದು, ಚೀನಾದಲ್ಲಿ ತಯಾರಾದ ಬಹುತೇಕ ಉತ್ಪನ್ನಗಳು ದೇಶದಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಮಾರಾಟವಾಗುತ್ತಿವೆ. ಇದೀಗ ದೇಶದ ವಿರುದ್ಧ ಚೀನಾ ತಿರುಗಿ ಬಿದ್ದಿರುವುದು ಖಂಡನೀಯವಾಗಿದ್ದು, ಚೀನಾ ವರ್ತನೆಯನ್ನು ತೀವ್ರವಾಗಿ ಖಂಡಿಸುವ ಜೊತೆಗೆ ತಕ್ಷಣದಿಂದ ದೇಶದ ಜನರು ಚೀನಾ ಉತ್ಪನ್ನಗಳನ್ನು ತಿರಸ್ಕರಿಸಬೇಕೆಂದು ಮನವಿ ಮಾಡಿದ್ದಾರೆ. 

ನಗರಸಭೆ ವ್ಯಾಪ್ತಿಯ ಕೆರೆಗಳ ಅಭಿವೃದ್ಧಿಗೆ ಸಿದ್ದ : ಪೌರಾಯುಕ್ತ ಮನೋಹರ್

ತಾಲೂಕು ಆಡಳಿತ ಬೌಂಡರಿ ನಿಗದಿ ಕಾರ್ಯ ಕೈಗೊಳ್ಳಲು ಎಲ್ಲಾ ರೀತಿಯ ಸಹಕಾರ 

ಭದ್ರಾವತಿ ನಗರಸಭೆ ವ್ಯಾಪ್ತಿಯ ಕೆರೆಗಳ ಅಭಿವೃದ್ಧಿಗೆ ಸಂಬಂಧಿಸಿದಂತೆ ನಗರಸಭೆ ಸಭಾಂಗಣದಲ್ಲಿ ತಹಸೀಲ್ದಾರ್ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಪೌರಾಯುಕ್ತ ಮನೋಹರ್ ಸರ್.ಎಂ ವಿಶ್ವೇಶ್ವರಯ್ಯ ಚಾರಿಟಬಲ್ ಟ್ರಸ್ಟ್, ಶ್ರೀ ಡಿ. ದೇವರಾಜ ಅರಸು ಜನಸ್ಪಂದನ ವೇದಿಕೆ, ಸುವರ್ಣ ಮಹಿಳಾ ವೇದಿಕೆ ವತಿಯಿಂದ ನಗರಸಭೆ ವ್ಯಾಪ್ತಿಯ ಕೆರೆಗಳ ಬೌಂಡರಿ ನಿಗದಿಗೊಳಿಸುವಂತೆ ಒತ್ತಾಯಿಸಿ ಸಲ್ಲಿಸಲಾದ ಮನವಿ ಸ್ವೀಕರಿಸಿದರು.  
ಭದ್ರಾವತಿ, ಜೂ. ೧೭: ನಗರಸಭೆ ವ್ಯಾಪ್ತಿಯಲ್ಲಿರುವ ಕೆರೆಗಳನ್ನು ಅಭಿವೃದ್ಧಿಪಡಿಸುವ ಸಂಬಂಧ ತಾಲೂಕು ಆಡಳಿತ ಬೌಂಡರಿ ನಿಗದಿ ಕಾರ್ಯ ಕೈಗೊಂಡಲ್ಲಿ ಎಲ್ಲಾ ರೀತಿಯ ಸಹಕಾರ ನೀಡುವುದಾಗಿ ಪೌರಾಯುಕ್ತ ಮನೋಹರ್ ಭರವಸೆ ನೀಡಿದರು. 
ಅವರು ನಗರಸಭೆ ಸಭಾಂಗಣದಲ್ಲಿ ಕೆರೆಗಳ ಅಭಿವೃದ್ಧಿಗೆ ಸಂಬಂಧಿಸಿದಂತೆ ತಹಸೀಲ್ದಾರ್ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಪಾಲ್ಗೊಂಡು ಸರ್.ಎಂ ವಿಶ್ವೇಶ್ವರಯ್ಯ ಚಾರಿಟಬಲ್ ಟ್ರಸ್ಟ್, ಶ್ರೀ ಡಿ. ದೇವರಾಜ ಅರಸು ಜನಸ್ಪಂದನ ವೇದಿಕೆ, ಸುವರ್ಣ ಮಹಿಳಾ ವೇದಿಕೆ ವತಿಯಿಂದ ನಗರಸಭೆ ವ್ಯಾಪ್ತಿಯ ಕೆರೆಗಳ ಬೌಂಡರಿ ನಿಗದಿಗೊಳಿಸುವಂತೆ ಒತ್ತಾಯಿಸಿ ಸಲ್ಲಿಸಲಾದ ಮನವಿ ಸ್ವೀಕರಿಸಿ ಮಾತನಾಡಿದರು. 
ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ದನಗಾಹಿಗಳಿಗೆ, ರೈತರಿಗೆ ಅನುಕೂಲ ಕಲ್ಪಿಸುವ ನಿಟ್ಟಿನಲ್ಲಿ ಮಹಾತ್ಮಗಾಂಧಿ ರಾಷ್ಟ್ರೀಯ ಉದ್ಯೋಗ ಖಾತ್ರಿ ಯೋಜನೆ ಹಾಗೂ ಅಂತರ್ಜಲ ಚೇತನ ಯೋಜನೆಯಡಿ ಕೆರೆಗಳನ್ನು ಅಭಿವೃದ್ಧಿ ಪಡಿಸಿದಂತೆ ನಗರಸಭೆ ವ್ಯಾಪ್ತಿಯಲ್ಲಿರುವ ಸುಮಾರು ೭೫ಕ್ಕೂ ಅಧಿಕ ಕೆರೆಗಳನ್ನು ಅಭಿವೃದ್ಧಿಪಡಿಸಲು ಕ್ರಮ ಕೈಗೊಳ್ಳಲಾಗುವುದು. ಇದಕ್ಕೂ ಮೊದಲು ತಾಲೂಕು ಆಡಳಿತ ಕೆರೆಗಳ ಬೌಂಡರಿ ನಿಗದಿಪಡಿಸಬೇಕಾಗಿದೆ ಎಂದರು. 
ತಕ್ಷಣ ತಾಲೂಕು ಆಡಳಿತ ಕೆರೆಗಳ ಬೌಂಡರಿ ನಿಗದಿ ಕಾರ್ಯ ಕೈಗೊಂಡಲ್ಲಿ ನಗರಸಭೆ ವತಿಯಿಂದ ಸಂಪೂರ್ಣ ಸಹಕಾರ ನೀಡಲಾಗುವುದು. ಅಲ್ಲದೆ ವಿವಿಧ ಇಲಾಖೆಗಳು ಕೆರೆಗಳ ಅಭಿವೃದ್ಧಿಗೆ ಹೆಚ್ಚಿನ ಸಹಕಾರ ನೀಡಬೇಕೆಂದು ಮನವಿ ಮಾಡಿದರು. 
ಶಿರಸ್ತೆದಾರ್ ಎಸ್.ಎಂ ಮಲ್ಲಿಕಾರ್ಜುನಯ್ಯ, ಸರ್ವೆ ಸೂಪರ್‌ವೈಸರ್ ಎ.ಎಲ್ ನಟರಾಜು, ಎಸ್‌ಡಿಎ ಪೂರ್ಣಿಮಾ, ಕೆಎನ್‌ಎನ್‌ಎಲ್ ನಂ.೩ ಸಹಾಯಕ ಕಾರ್ಯಪಾಲಕ ಇಂಜಿನಿಯರ್ ಆರ್.ಬಿ ಮಂಜುನಾಥ್, ಸಹಾಯಕ ಇಂಜಿನಿಯರ್ ಎನ್. ಉಮೇಶ್, ಶಿವಮೊಗ್ಗ ಎಂ.ಐ ಸಬ್‌ಡಿವಿಷನ್ ಸಹಾಯಕ ಕಾರ್ಯಪಾಲಕ ಇಂಜಿನಿಯರ್ ರಂಗನಾಥ,  ಸರ್.ಎಂ ವಿಶ್ವೇಶ್ವರಯ್ಯ ಚಾರಿಟಬಲ್ ಟ್ರಸ್ಟ್, ಶ್ರೀ ಡಿ. ದೇವರಾಜ ಅರಸು ಜನಸ್ಪಂದನ ವೇದಿಕೆ, ಸುವರ್ಣ ಮಹಿಳಾ ವೇದಿಕೆ ಛೇರ‍್ಮನ್ ಆರ್. ವೇಣುಗೋಪಾಲ್, ರಮಾ ವೆಂಕಟೇಶ್, ಶೈಲಜಾ ರಾಮಕೃಷ್ಣ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು. 

Tuesday, June 16, 2020

ವಿವಿಧ ಸಂಘ-ಸಂಸ್ಥೆಗಳಿಂದ ಸಂಸದರಿಗೆ ಸನ್ಮಾನ

ಭದ್ರಾವತಿಯಲ್ಲಿ ಮಂಗಳವಾರ ಸಂಸದ ಬಿ.ವೈ ರಾಘವೇಂದ್ರ ಅವರನ್ನು ಆರ್ಯ ವೈಶ್ಯ ಸಮಾಜದ ವತಿಯಿಂದ ಸನ್ಮಾನಿಸಿ ಅಭಿನಂದಿಸಲಾಯಿತು. 
ಭದ್ರಾವತಿ, ಜೂ. ೧೬: ನಗರದಲ್ಲಿ ವಿವಿಧ ಸಂಘ-ಸಂಸ್ಥೆಗಳಿಂದ ಮಂಗಳವಾರ ಸಂಸದ ಬಿ.ವೈ ರಾಘವೇಂದ್ರ ಅವರಿಗೆ ಅಭಿನಂದನೆಗಳನ್ನು ಸಲ್ಲಿಸಲಾಯಿತು. 
ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಮತ್ತು ಸಂಸದ ಬಿ.ವೈ ರಾಘವೇಂದ್ರರವರು ಆರ್ಯವೈಶ್ಯ ಸಮಾಜದ ಮೇಲೆ ಹೊಂದಿರುವ ವಿಶ್ವಾಸಕ್ಕೆ ನಗರದ ಆರ್ಯ ವೈಶ್ಯ ಸಮಾಜ ಬಂಧುಗಳು ಕೃತಜ್ಞತೆ ಸಲ್ಲಿಸುವ ಜೊತೆಗೆ ಸಂಸದ ಬಿ.ವೈ ರಾಘವೇಂದ್ರ ಅವರನ್ನು ಸನ್ಮಾನಿಸಿ ಅಭಿನಂದಿಸಿದರು. 
ಆರ್ಯ ವೈಶ್ಯ ಸಮಾಜ ಅಧ್ಯಕ್ಷ ಬಿ.ಆರ್  ಬದರಿನಾರಾಯಣ, ಕಾರ್ಯದರ್ಶಿ ಸತೀಶ್, ಖಜಾಂಚಿ ರಾಘವೇಂದ್ರ, ಮಹಿಳಾ ಘಟಕದ ಅಧ್ಯಕ್ಷೆ ಸತ್ಯಲಕ್ಷ್ಮಿ, ವನಿತಾ, ಸ್ವರೂಪ ರಾಣಿ, ಸಮಾಜದ ಮಾಜಿ ಅಧ್ಯಕ್ಷ ಕಾ.ರಾ ನಾಗರಾಜ್, ಗಿರೀಶ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು. 
ಭದ್ರಾವತಿ ಮಂಗಳವಾರ ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ಸಂಸದ ಬಿ.ವೈ ರಾಘವೇಂದ್ರ, ಶಾಸಕರಾದ ಬಿ.ಕೆ ಸಂಗಮೇಶ್ವರ್, ಕೆ.ಬಿ ಅಶೋಕನಾಯ್ಕ ಅವರನ್ನು ಕೇಸರಿ ಪೇಟದೊಂದಿಗೆ ಸನ್ಮಾನಿಸಿ ಗೌರವಿಸಲಾಯಿತು. 
      ಕೇಸರಿ ಪೇಟದೊಂದಿಗೆ ಸನ್ಮಾನ: 
ತಾಲೂಕು ಪಂಚಾಯಿತಿಗೆ ಮಂಗಳವಾರ ಆಗಮಿಸಿದ್ದ ಸಂಸದ ಬಿ.ವೈ ರಾಘವೇಂದ್ರ ಅವರಿಗೆ ಕೇಸರಿ ಪೇಟದೊಂದಿಗೆ ಸದಸ್ಯ ತಿಪ್ಪೇಶ್‌ರಾವ್ ಸನ್ಮಾನಿಸಿ ಗೌರವಿಸಿದರು. 
ಅಲ್ಲದೆ ಶಾಸಕರಾದ ಬಿ.ಕೆ ಸಂಗಮೇಶ್ವರ್ ಮತ್ತು ಕೆ.ಬಿ ಅಶೋಕನಾಯ್ಕ ಅವರನ್ನು ಸಹ ಸನ್ಮಾನಸಿ ಗೌರವಿಸಿದ್ದು, ಎಲ್ಲರ ಗಮನ ಸೆಳೆಯಿತು. 
ತಹಸೀಲ್ದಾರ್ ಶಿವಕುಮಾರ್, ತಾಲೂಕು ಪಂಚಾಯಿತಿ ಅಧ್ಯಕ್ಷೆ ಆಶಾ ಶ್ರೀಧರ್, ಉಪಾಧ್ಯಕ್ಷೆ ಸರೋಜಮ್ಮ ಹಾಜ್ಯನಾಯ್ಕ, ಸಾಮಾಜಿಕ ನ್ಯಾಯ ಸಮಿತಿ ಅಧ್ಯಕ್ಷ ರಮೇಶ್, ಸದಸ್ಯರಾದ ಧರ್ಮೇಗೌಡ, ಕೆ. ಮಂಜುನಾಥ್, ರುದ್ರಪ್ಪ, ಎಂ.ಜಿ ದಿನೇಶ್, ಅಣ್ಣಾ ಮಲೈ, ಡಿ. ಲಕ್ಷ್ಮಿದೇವಿ, ನೇತ್ರಾಬಾಯಿ, ತುಂಗಮ್ಮ, ಸಿ. ಮಂಜುಳ, ಗೀತಾ ಜಗದೀಶ್, ಎಂ. ನಾಗರಾಜ, ಉಷಾಕಿರಣ, ಶಮಾಬಾನು, ಪ್ರೇಮ್‌ಕುಮಾರ್, ಕಾರ್ಯನಿರ್ವಹಣಾಧಿಕಾರಿ ಡಾ. ಕೊಟ್ರೇಶಪ್ಪ, ವಿವಿಧ ಇಲಾಖೆಗಳ ತಾಲೂಕು ಮಟ್ಟದ ಅಧಿಕಾರಿಗಳು ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು. 

೨೨೦ ಎಂಪಿಎಂ ಕಾರ್ಮಿಕರಿಗೆ ಉದ್ಯೋಗದ ಭರವಸೆ

ಭದ್ರಾವತಿಯಲ್ಲಿ ಮಂಗಳವಾರ ಶ್ರೀ ಮೈಸೂರು ಕಾಗದ ಕಾರ್ಖಾನೆ ನೌಕರರ ಸಂಘದ ಅಧ್ಯಕ್ಷ ಎಸ್. ಚಂದ್ರಶೇಖರ್ ನೇತೃತ್ವದಲ್ಲಿ ಕಾರ್ಮಿಕರು ಸಂಸದ ಬಿ.ವೈ. ರಾಘವೇಂದ್ರ ಅವರನ್ನು ತಾಲೂಕು ಪಂಚಾಯಿತಿ ಆವರಣದಲ್ಲಿ ಭೇಟಿ ಮಾಡಿ ತಮ್ಮ ಅಳಲು ವ್ಯಕ್ತಪಡಿಸಿದರು. 
ಭದ್ರಾವತಿ, ಜೂ. ೧೬: ನಗರದ ರಾಜ್ಯ ಸರ್ಕಾರಿ ಸ್ವಾಮ್ಯದ ಮೈಸೂರು ಕಾಗದ ಕಾರ್ಖಾನೆಯಲ್ಲಿ ಸ್ವಯಂ ನಿವೃತ್ತಿ ಪಡೆಯದೆ ಸೇವೆ ಸಲ್ಲಿಸುತ್ತಿರುವ ಸುಮಾರು ೨೨೦ ಕಾಯಂ ಕಾರ್ಮಿಕರಿಗೆ ಶಾಶ್ವತ ಭದ್ರತೆ ಕಲ್ಪಿಸಿಕೊಡುವಂತೆ ಸಂಸದ ಬಿ.ವೈ ರಾಘವೇಂದ್ರ ಅವರಿಗೆ ಮಂಗಳವಾರ ಒತ್ತಾಯಿಸಲಾಯಿತು. 
ಶ್ರೀ ಮೈಸೂರು ಕಾಗದ ಕಾರ್ಖಾನೆ ನೌಕರರ ಸಂಘದ ಅಧ್ಯಕ್ಷ ಎಸ್. ಚಂದ್ರಶೇಖರ್ ನೇತೃತ್ವದಲ್ಲಿ ಕಾರ್ಮಿಕರು ತಾಲೂಕು ಪಂಚಾಯಿತಿ ಆವರಣದಲ್ಲಿ ಸಂಸದರನ್ನು ಭೇಟಿ ಮಾಡಿ, ಪ್ರಸ್ತುತ ಕಾರ್ಖಾನೆಯಲ್ಲಿ ಹೆಚ್ಚಿನ ಸೇವಾವಧಿ ಹೊಂದಿರುವ ಸುಮಾರು ೨೨೦ ಕಾರ್ಮಿಕರು ಸೇವೆ ಸಲ್ಲಿಸುತ್ತಿದ್ದಾರೆ. ಸರ್ಕಾರ ಕಾರ್ಖಾನೆಯನ್ನು ಪುನಃ ಆರಂಭಿಸುವ ಭರವಸೆ ನೀಡಿದೆ. ಆದರೆ ೨೨೦ ಕಾರ್ಮಿಕರಿಗೆ ಉದ್ಯೋಗದ ಯಾವುದೇ ಭದ್ರತೆ ಇಲ್ಲವಾಗಿದೆ. ಈ ಕುರಿತು ಕಾರ್ಖಾನೆ ವ್ಯವಸ್ಥಾಪಕರನ್ನು ಪ್ರಶ್ನಿಸಿದಾಗ ಅವರಿಂದ ಉದ್ಯೋಗ ಭದ್ರತೆ ನೀಡುವ ಯಾವುದೇ ಭರವಸೆ ವ್ಯಕ್ತವಾಗಿಲ್ಲ. ಇದರಿಂದಾಗಿ ಅತಂತ್ರ ಸ್ಥಿತಿ ನಿರ್ಮಾಣವಾಗಿದೆ ಎಂದು ಆತಂಕ ವ್ಯಕ್ತಪಡಿಸಿದರು. 
ಇದಕ್ಕೆ ಪ್ರತಿಕ್ರಿಯಿಸಿದ ಸಂಸದರು, ಕಾರ್ಖಾನೆಯನ್ನು ಉಳಿಸಿಕೊಳ್ಳುವಲ್ಲಿ ರಾಜ್ಯ ಸರ್ಕಾರ ಆಸಕ್ತಿ ತೋರಿಸಿರುವಾಗ ೨೨೦ ಕಾರ್ಮಿಕರನ್ನು ಸಹ ಉಳಿಸಿಕೊಳ್ಳಲಾಗುವುದು. ಈ ಬಗ್ಗೆ ಯಾವುದೇ ಆತಂಕ ಬೇಡ. ಸದ್ಯದಲ್ಲಿಯೇ ಈ ಸಂಬಂಧ ಸಭೆ ಕರೆಯುವುದಾಗಿ ಭರವಸೆ ನೀಡಿದರು.

ಭದ್ರಾವತಿ ತಾಲೂಕಿನ ಸರ್ವತೋಮುಖ ಅಭಿವೃದ್ಧಿಗೆ ಬದ್ಧ : ಸಂಸದ ಬಿ.ವೈ ರಾಘವೇಂದ್ರ

ಭದ್ರಾವತಿ ತಾಲೂಕು ಪಂಚಾಯಿತಿಯಲ್ಲಿ ಮಂಗಳವಾರ ನಡೆದ ಪ್ರಗತಿಪರಿಶೀಲನಾ ಸಭೆಯಲ್ಲಿ ಸಂಸದ ಬಿ.ವೈ ರಾಘವೇಂದ್ರ, ಶಾಸಕರಾದ ಬಿ.ಕೆ ಸಂಗಮೇಶ್ವರ್, ಕೆ.ಬಿ ಅಶೋಕನಾಯ್ಕ ಅವರನ್ನು ಸನ್ಮಾನಿಸಿ ಗೌರವಿಸಲಾಯಿತು. 
ಭದ್ರಾವತಿ, ಜೂ. ೧೬: ಕೇಂದ್ರ ಉಕ್ಕು ಪ್ರಾಧಿಕಾರದ ವಿಶ್ವೇಶ್ವರಾಯ ಕಬ್ಬಿಣ ಮತ್ತು ಉಕ್ಕಿನ ಕಾರ್ಖಾನೆ ಹಾಗೂ ರಾಜ್ಯ ಸರ್ಕಾರಿ ಸ್ವಾಮ್ಯದ ಮೈಸೂರು ಕಾಗದ ಕಾರ್ಖಾನೆ ಈ ಎರಡು ಕಾರ್ಖಾನೆಗಳನ್ನು ಅಭಿವೃದ್ಧಿಗೊಳಿಸುವ ಜೊತೆಗೆ ಭದ್ರಾವತಿ ತಾಲೂಕಿನ ಸರ್ವತೋಮುಖ ಅಭಿವೃದ್ಧಿಗೆ ಸಂಬಂಧಿಸಿದಂತೆ ಈಗಾಗಲೇ ಕಾರ್ಯಯೋಜನೆಗಳನ್ನು ಸಿದ್ದಪಡಿಸಲಾಗಿದೆ ಎಂದು ಸಂಸದ ಬಿ.ವೈ ರಾಘವೇಂದ್ರ ಹೇಳಿದರು.
ಅವರು ತಾಲೂಕು ಪಂಚಾಯಿತಿಯಲ್ಲಿ ಮಂಗಳವಾರ ನಡೆದ ಪ್ರಗತಿಪರಿಶೀಲನಾ ಸಭೆಯಲ್ಲಿ ಅಭಿನಂದನೆ ಸ್ವೀಕರಿಸಿ ಮಾತನಾಡಿದರು. 
ಹಲವಾರು ಮಹಾನ್ ವ್ಯಕ್ತಿಗಳು, ಹಿರಿಯರು ಶಿವಮೊಗ್ಗ ಲೋಕಸಭಾ ಕ್ಷೇತ್ರದ ಚುನಾಯಿತ ಪ್ರತಿನಿಧಿಯಾಗಿ ಸೇವೆ ಸಲ್ಲಿಸಿದ್ದಾರೆ. ಚುನಾಯಿತ ಪ್ರತಿನಿಧಿಯಾಗಿ ಅವರ ಸ್ಥಾನದಲ್ಲಿ ನಾನು ಸಹ ಸೇವೆ ಸಲ್ಲಿಸುತ್ತಿರುವುದು ಹೆಮ್ಮೆಯ ಸಂಗತಿಯಾಗಿದೆ ಎಂದರು. 
ಸಂಸದನಾಗಿ ಜಿಲ್ಲೆಯ ಸರ್ವತೋಮುಖ ಅಭಿವೃದ್ಧಿಗೆ ಶ್ರಮಿಸುತ್ತಿದ್ದೇನೆ. ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಸಹ ಸಾಕಷ್ಟು ಶ್ರಮಿಸಿದ್ದು, ಜಿಲ್ಲೆಗೆ ಹಲವಾರು ಕೊಡುಗೆಗಳನ್ನು ನೀಡಿದ್ದಾರೆ. ಇದೀಗ ಸುಮಾರು ೧೨೦ ಕೋ.ರು. ವೆಚ್ಚದ ವಿಮಾನ ನಿಲ್ದಾಣದ ಶಂಕಸ್ಥಾಪನೆ ನೆರವೇರಿಸಲಾಗಿದ್ದು, ಶೀಘ್ರದಲ್ಲಿಯೇ ಮುಕ್ತಾಯಗೊಳ್ಳಲಿದೆ. ಮುಂದಿನ ದಿನಗಳಲ್ಲಿ ಶಿವಮೊಗ್ಗ ಜಿಲ್ಲೆ ಮತ್ತಷ್ಟು ಅಭಿವೃದ್ಧಿ ಹೊಂದಲಿದೆ ಎಂದರು. 
ಭದ್ರಾವತಿ ತಾಲೂಕಿನಲ್ಲಿ ಸಾಕಷ್ಟು ಅಭಿವೃದ್ಧಿ ಕೆಲಸಗಳು ನಡೆಯಬೇಕಾಗಿದೆ. ಮುಖ್ಯವಾಗಿ ವಿಐಎಸ್‌ಎಲ್ ಮತ್ತು ಎಂಪಿಎಂ ಕಾರ್ಖಾನೆಗಳನ್ನು ಅಭಿವೃದ್ಧಿಗೊಳಿಸಬೇಕಾಗಿದೆ. ಈಗಾಗಲೇ ಎಂಪಿಎಂ ಕಾರ್ಖಾನೆಯನ್ನು ಪುನರ್ ಆರಂಭಿಸುವ ಕುರಿತು ಮುಖ್ಯಮಂತ್ರಿಗಳು ಭರವಸೆ ನೀಡಿದ್ದಾರೆ. ಈ ನಿಟ್ಟಿನಲ್ಲಿ ಕಾರ್ಖಾನೆಗೆ ಈ ಹಿಂದೆ ನೀಡಲಾಗಿದ್ದ ಅರಣ್ಯ ಭೂಮಿಯನ್ನು ಅರಣ್ಯ ಇಲಾಖೆಗೆ ಹಿಂದಿರುಗಿಸದೆ ಉಳಿಸಿಕೊಳ್ಳಲಾಗಿದೆ. ಕಾರ್ಖಾನೆಯನ್ನು ಆರಂಭಿಸುವ ಸಂಬಂಧ ಮುಂದಿನ ದಿನಗಳಲ್ಲಿ ಹಂತ ಹಂತವಾಗಿ ಯೋಜನೆಗಳನ್ನು ಸಿದ್ದಪಡಿಸಿಕೊಳ್ಳಲಾಗುವುದು. ಇದೆ ರೀತಿ ವಿಐಎಸ್‌ಎಲ್ ಕಾರ್ಖಾನೆಯನ್ನು ಸಹ ಬಂಡವಾಳ ಹಿಂಪಡೆಯುವ ಪಟ್ಟಿಯಿಂದ ಹೊರತಂದು ಹಂತ ಹಂತವಾಗಿ ಅಭಿವೃದ್ಧಿಪಡಿಸಲು ಪ್ರಯತ್ನಿಸಲಾಗುವುದು ಎಂದರು. 
ತಾಲೂಕು ಪಂಚಾಯಿತಿ ವ್ಯಾಪ್ತಿಯಲ್ಲಿ ಸಾಕಷ್ಟು ಅಭಿವೃದ್ಧಿ ಕೆಲಸಗಳು ನಡೆಯಬೇಕಾಗಿದೆ. ಬಹುಮುಖ್ಯವಾಗಿ ರಸ್ತೆಗಳು ನಿರ್ಮಾಣವಾಗಬೇಕಾಗಿದೆ. ಕೇಂದ್ರ ಸರ್ಕಾರದ ಅನುದಾನಗಳನ್ನು ಸದ್ಬಳಕೆಮಾಡಿಕೊಂಡು ಅಭಿವೃದ್ಧಿ ಕಾರ್ಯಗಳನ್ನು ಕೈಗೊಳ್ಳಲು ಎಲ್ಲಾ ರೀತಿಯ ಸಹಕಾರ ನೀಡುವುದಾಗಿ ಭರವಸೆ ನೀಡಿದರು. 
ತಾಲೂಕು ಪಂಚಾಯಿತಿಗೆ ಹೊಸ ಕಟ್ಟಡದ ಅವಶ್ಯಕತೆ ಇದ್ದು, ಈ ಕುರಿತು ಶಾಸಕರು ಸಹ ಮನವರಿಕೆ ಮಾಡಿಕೊಟ್ಟಿದ್ದಾರೆ. ಸುಸಜ್ಜಿತ ಕಟ್ಟಡ ನಿರ್ಮಾಣಕ್ಕೆ ತಕ್ಷಣ ನೀಲನಕ್ಷೆ ಸಿದ್ದಪಡಿಸಿದ್ದಲ್ಲಿ ಶಾಸಕರೊಂದಿಗೆ ಕಟ್ಟಡ ನಿರ್ಮಾಣಕ್ಕೆ ತಾವು ಸಹ ಕೈಜೋಡಿಸುವುದಾಗಿ ಭರವಸೆ ನೀಡಿದರು. 
ಶಾಸಕ ಬಿ.ಕೆ ಸಂಗಮೇಶ್ವರ್ ಮಾತನಾಡಿ, ಕ್ಷೇತ್ರದ ಸರ್ವತೋಮುಖ ಅಭಿವೃದ್ಧಿಗೆ ಸಂಸದರು ಮುಂದಾಗಬೇಕು. ಕೇಂದ್ರ ಮತ್ತು ರಾಜ್ಯ ಸರ್ಕಾರದಿಂದ ಹೆಚ್ಚಿನ ಅನುದಾನ ಬಿಡುಗಡೆಗೊಳಿಸುವ ನಿಟ್ಟಿನಲ್ಲಿ ಹೆಚ್ಚಿನ ಗಮನ ಹರಿಸುವ ಜೊತೆಗೆ ಹೊಸ ಯೋಜನೆಗಳನ್ನು ಅನುಷ್ಠಾನಗೊಳಿಸಬೇಕೆಂದು ಮನವಿ ಮಾಡಿದರು. 
ಶಾಸಕರಾದ ಕೆ.ಬಿ ಅಶೋಕನಾಯ್ಕ, ತಹಸೀಲ್ದಾರ್ ಶಿವಕುಮಾರ್, ತಾಲೂಕು ಪಂಚಾಯಿತಿ ಅಧ್ಯಕ್ಷೆ ಆಶಾ ಶ್ರೀಧರ್, ಉಪಾಧ್ಯಕ್ಷೆ ಸರೋಜಮ್ಮ ಹಾಜ್ಯನಾಯ್ಕ, ಸಾಮಾಜಿಕ ನ್ಯಾಯ ಸಮಿತಿ ಅಧ್ಯಕ್ಷ ರಮೇಶ್, ಸದಸ್ಯರಾದ ಧರ್ಮೇಗೌಡ, ಕೆ. ಮಂಜುನಾಥ್, ರುದ್ರಪ್ಪ, ತಿಪ್ಪೇಶ್‌ರಾವ್, ಎಂ.ಜಿ ದಿನೇಶ್, ಅಣ್ಣಾ ಮಲೈ, ಡಿ. ಲಕ್ಷ್ಮಿದೇವಿ, ನೇತ್ರಾಬಾಯಿ, ತುಂಗಮ್ಮ, ಸಿ. ಮಂಜುಳ, ಗೀತಾ ಜಗದೀಶ್, ಎಂ. ನಾಗರಾಜ, ಉಷಾಕಿರಣ, ಶಮಾಬಾನು, ಪ್ರೇಮ್‌ಕುಮಾರ್, ಕಾರ್ಯನಿರ್ವಹಣಾಧಿಕಾರಿ ಡಾ. ಕೊಟ್ರೇಶಪ್ಪ, ವಿವಿಧ ಇಲಾಖೆಗಳ ತಾಲೂಕು ಮಟ್ಟದ ಅಧಿಕಾರಿಗಳು ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು. 

ಅಂಗನವಾಡಿ, ಆಶಾ ಕಾರ್ಯಕರ್ತೆಯರಿಗೂ ಅತ್ಯುನ್ನತ ನಾಗರೀಕ ಪ್ರಶಸ್ತಿ ಲಭಿಸಲಿ : ಬಿ.ವೈ ರಾಘವೇಂದ್ರ

ಭದ್ರಾವತಿಯಲ್ಲಿ ಮಂಗಳವಾರ ಬಿ.ಎಚ್ ರಸ್ತೆ ಶ್ರೀ ಮಂಜುನಾಥಸ್ವಾಮಿ ಕಲ್ಯಾಣ ಮಂಟಪದಲ್ಲಿ ಹಮ್ಮಿಕೊಳ್ಳಲಾಗಿದ್ದ ಅಂಗನವಾಡಿ ಹಾಗೂ ಆಶಾ ಕಾರ್ಯಕರ್ತೆಯರಿಗೆ ಅಭಿನಂದನಾ ಸಮಾರಂಭದಲ್ಲಿ ಸಂಸದ ಬಿ.ವೈ ರಾಘವೇಂದ್ರ ಮಾತನಾಡಿದರು. 
ಭದ್ರಾವತಿ, ಜೂ. ೧೬: ಅಂಗನವಾಡಿ ಹಾಗೂ ಆಶಾ ಕಾರ್ಯಕರ್ತೆಯರ ಸೇವೆ ಅನನ್ಯವಾಗಿದ್ದು, ಇವರ ಸೇವೆಗೆ ಯಾರಿಂದಲೂ ಬೆಲೆ ಕಟ್ಟಲು ಸಾಧ್ಯವಿಲ್ಲ. ಈ ಹಿನ್ನಲೆಯಲ್ಲಿ ಇವರಿಗೂ ದೇಶದ ಅತ್ಯುನ್ನತ ನಾಗರೀಕ ಪ್ರಶಸ್ತಿ ಲಭಿಸುವಂತಾಗಬೇಕೆಂದು ಸಂಸದ ಬಿ.ವೈ ರಾಘವೇಂದ್ರ ಹೇಳಿದರು. 
ಅವರು ಮಂಗಳವಾರ ನಗರದ ಬಿ.ಎಚ್ ರಸ್ತೆ ಶ್ರೀ ಮಂಜುನಾಥಸ್ವಾಮಿ ಕಲ್ಯಾಣ ಮಂಟಪದಲ್ಲಿ ಹಮ್ಮಿಕೊಳ್ಳಲಾಗಿದ್ದ ಅಂಗನವಾಡಿ ಹಾಗೂ ಆಶಾ ಕಾರ್ಯಕರ್ತೆಯರಿಗೆ ಅಭಿನಂದನಾ ಸಮಾರಂಭದಲ್ಲಿ ಪಾಲ್ಗೊಂಡು ಮಾತನಾಡಿದರು. 
ಕೊರೋನಾ ವೈರಸ್ ವ್ಯಾಪಕವಾಗಿ ಹರಡುತ್ತಿರುವ ಸಂದರ್ಭದಲ್ಲಿ ಯಾವುದೇ ಜೀವ ಭಯವಿಲ್ಲದೆ ಸೇವೆ ಸಲ್ಲಿಸುತ್ತಿರುವುದು ನಿಜವಾಗಿಯೂ ಶ್ಲಾಘನೀಯ ಕಾರ್ಯವಾಗಿದೆ. ಈ ಮಹಿಳೆಯರ ಮೇಲೂ ಹಲ್ಲೆ ಪ್ರಕರಣಗಳು ನಡೆದಿರುವುದು ವಿಪರ್ಯಾಸದ ಸಂಗತಿಯಾಗಿದೆ. ಅದರಲ್ಲೂ ಕಂಟೈನ್‌ಮೆಂಟ್ ವಲಯಗಳಲ್ಲಿ ಕಾರ್ಯ ನಿರ್ವಹಿಸುವ ಮಹಿಳೆಯರ ಧೈರ್ಯ ಮೆಚ್ಚುವಂತದ್ದಾಗಿದೆ ಎಂದರು. 
ಪ್ರಧಾನಿ ಮೋದಿಯವರು ಈ ಮಹಿಳೆಯರ ಕಾರ್ಯವನ್ನು ಪ್ರಶಂಸಿದ್ದಾರೆ. ಕರ್ತವ್ಯದ ವೇಳೆ ಕೊರೋನಾ ವೈರಸ್ ತಗುಲಿ ಮೃತಪಟ್ಟಲ್ಲಿ ಈ ಮಹಿಳೆಯರಿಗೂ ಸಹ ೫೦ ಲಕ್ಷ  ರು. ಪರಿಹಾರ ನೀಡುವ ಕುರಿತು ಸರ್ಕಾರದಲ್ಲಿ ಚರ್ಚೆಗಳು ನಡೆಯುತ್ತಿವೆ. ರಾಜ್ಯದಲ್ಲಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಅಂಗನವಾಡಿ ಹಾಗೂ ಆಶಾ ಕಾರ್ಯಕರ್ತೆಯರ ಹಲವು ಬೇಡಿಕೆಗಳನ್ನು ಈಡೇರಿಸಿಕೊಡಲಾಗಿದೆ. ಮುಂದಿನ ದಿನಗಳಲ್ಲಿ ವೇತನ ಸಹ ಹೆಚ್ಚಾಗಲಿದೆ ಎಂದರು. 
ಕೇವಲ ಶ್ರೀಮಂತ ವರ್ಗದವರಿಗೆ ಮಾತ್ರ ಮೀಸಲಾಗಿರುವ ವಿಮಾನ ಪ್ರಯಾಣ ಇನ್ನೂ ಮುಂದೆ ಸಾಮಾನ್ಯ ವರ್ಗದವರಿಗೂ ಸಹ ತಲುಪವಂತಾಗಬೇಕು. ಈ ನಿಟ್ಟಿನಲ್ಲಿ ಬಿಜೆಪಿ ಸರ್ಕಾರ ಹಲವು ಯೋಜನೆಗಳನ್ನು ರೂಪಿಸಿದೆ. ಹಲವು ವರ್ಷಗಳ ನಿರಂತರ ಪ್ರಯತ್ನದ ಫಲವಾಗಿ ಶಿವಮೊಗ್ಗದಲ್ಲಿ ನೂತನ ವಿಮಾನ ನಿಲ್ದಾಣ ಶಂಕುಸ್ಥಾಪನೆ ನೆರವೇರಿಸಲಾಗಿದೆ. ಮುಂದಿನ ದಿನಗಳಲ್ಲಿ ಅಂಗನವಾಡಿ, ಆಶಾ ಕಾರ್ಯಕರ್ತೆಯರೂ ಸಹ ರಿಯಾಯಿತಿ ದರದಲ್ಲಿ ವಿಮಾನಗಳಲ್ಲಿ ಪ್ರಯಾಣಿಸಬಹುದಾಗಿದೆ ಎಂದರು.
ಶಿವಮೊಗ್ಗ ಗ್ರಾಮಾಂತರ ವಿಧಾನಸಭಾ ಕ್ಷೇತ್ರದ ಶಾಸಕ ಕೆ.ಬಿ ಅಶೋಕನಾಯ್ಕ್ ಮಾತನಾಡಿ, ದೇಶದಲ್ಲಿ ಮಹಾಮಾರಿ ವ್ಯಾಪಕವಾಗಿ ಹರಡುತ್ತಿದೆ. ಇಂತಹ ಸಂದರ್ಭದಲ್ಲಿ ರಾಜ್ಯದಲ್ಲಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪನವರು ಕೈಗೊಂಡ ಹಲವು ದಿಟ್ಟ ಕ್ರಮಗಳಿಂದಾಗಿ ವೈರಸ್ ನಿಯಂತ್ರಣದಲ್ಲಿದೆ. ಕೊರೋನಾ ಬಾಧಿತ ಇತರೆ ರಾಜ್ಯಗಳಿಗೆ ಹೋಲಿಕೆ ಮಾಡಿ ನೋಡಿದಾಗ ನಿಜವಾದ ಪರಿಶ್ರಮ ಅರ್ಥವಾಗುತ್ತದೆ. ಶಿವಮೊಗ್ಗ ಜಿಲ್ಲೆಯಲ್ಲೂ ಸಹ ವ್ಯಾಪಕ ಕ್ರಮಗಳನ್ನು ಕೈಗೊಳ್ಳಲಾಗಿದ್ದು, ಲಾಕ್‌ಡೌನ್ ಸಡಿಲಗೊಂಡ ಪರಿಣಾಮ ಬೇರೆ ರಾಜ್ಯಗಳಿಂದ ಜಿಲ್ಲೆಯಲ್ಲಿ ಕೊರೋನಾ ವೈರಸ್ ವ್ಯಾಪಿಸಿದೆ. ಆದರೂ ಸಹ ನಿಯಂತ್ರಿಸುವಲ್ಲಿ ಜಿಲ್ಲಾಡಳಿತ ಯಶಸ್ವಿಯಾಗಿದೆ ಎಂದರು. 
ಬಿಜೆಪಿ ಜಿಲ್ಲಾಧ್ಯಕ್ಷ ಮೇಘರಾಜ್ ಮಾತನಾಡಿ, ಪ್ರಧಾನಿ ಮೋದಿಯವರು ಮೊದಲ ಬಾರಿಗೆ ಪೌರಕಾರ್ಮಿಕರ ಸೇವೆಯನ್ನು ವಿಶ್ವಕ್ಕೆ ತೋರಿಸುವ ಮೂಲಕ ಅವರ ಸೇವೆಗೆ ಬೆಲೆ ತಂದುಕೊಟ್ಟಿದ್ದರು. ಇದೀಗ ಅಂಗನವಾಡಿ ಹಾಗೂ ಆಶಾ ಕಾರ್ಯಕರ್ತೆಯರ ಸೇವೆಯನ್ನೂ ಸಹ ಗುರುತಿಸಿ ಅವರ ಅಭಿನಂದಿಸುತ್ತಿದ್ದಾರೆ. ಈ ನಿಟ್ಟಿನಲ್ಲಿ ಲೋಕಸಭಾ ಸದಸ್ಯ ಬಿ.ವೈ ರಾಘವೇಂದ್ರ ಪೂರಕವಾಗಿ ಸ್ಪಂದಿಸುತ್ತಿದ್ದಾರೆ. ಜಿಲ್ಲೆಯಲ್ಲಿ ಹಲವಾರು ಅಭಿವೃದ್ಧಿ ಕಾರ್ಯಗಳನ್ನು ಕೈಗೊಂಡು ಮಾದರಿಯಾಗಿದ್ದಾರೆಂದು ಪ್ರಶಂಸೆ ವ್ಯಕ್ತಪಡಿಸಿದರು. 
ವೇದಿಕೆಯಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ರಾಜೇಶ್ ಸುರಗಿಹಳ್ಳಿ, ತಹಸೀಲ್ದಾರ್ ಶಿವಕುಮಾರ್, ನಗರಸಭೆ ಪೌರಾಯುಕ್ತ ಮನೋಹರ್, ತಾಲೂಕು ಆರೋಗ್ಯಾಧಿಕಾರಿ ಡಾ. ಎಂ.ಆರ್ ಗಾಯತ್ರಿ, ಶಿಶು ಅಭಿವೃದ್ಧಿ ಯೋಜನಾಧಿಕಾರಿ ಸುರೇಶ್, ಬಿಜೆಪಿ ಪಕ್ಷದ ಮುಖಂಡರಾದ ಎಂ. ಪ್ರಭಾಕರ್, ವಿ. ಕದಿರೇಶ್, ವಿಶ್ವನಾಥಕೋಠಿ, ಬಿ.ಕೆ ಶ್ರೀನಾಥ್, ಜಿ. ಧರ್ಮಪ್ರಸಾದ್, ಮಂಗೋಟೆ ರುದ್ರೇಶ್, ಜಿ. ಆನಂದಕುಮಾರ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.