Friday, June 26, 2020

ಅಂಗನವಾಡಿ ಕೇಂದ್ರಗಳಿಗೆ ವಿದ್ಯುತ್ ಸಂಪರ್ಕ ಕಲ್ಪಿಸಿ : ಪೌರಾಯುಕ್ತರಿಗೆ ಮನವಿ

ಭದ್ರಾವತಿ ನಗರಸಭೆ ವ್ಯಾಪ್ತಿಯ ವೇಲುರ್ ಶೆಡ್‌ನಲ್ಲಿರುವ ೨ ಅಂಗನವಾಡಿ ಕೇಂದ್ರಗಳಿಗೆ ವಿದ್ಯುತ್ ಸಂಪರ್ಕ ಕಲ್ಪಿಸಿಕೊಡುವಂತೆ ಒತ್ತಾಯಿಸಿ ‘ಮಹಿಳಾ ಮುನ್ನಡೆ’ ವತಿಯಿಂದ ಶುಕ್ರವಾರ ಪೌರಾಯುಕ್ತ ಮನೋಹರ್‌ಗೆ ಮನವಿ ಸಲ್ಲಿಸಲಾಯಿತು. 
ಭದ್ರಾವತಿ, ಜೂ. ೨೬: ನಗರಸಭೆ ವ್ಯಾಪ್ತಿಯ ವೇಲುರ್ ಶೆಡ್‌ನಲ್ಲಿರುವ ೨ ಅಂಗನವಾಡಿ ಕೇಂದ್ರಗಳಿಗೆ ವಿದ್ಯುತ್ ಸಂಪರ್ಕ ಕಲ್ಪಿಸಿಕೊಡುವಂತೆ ಒತ್ತಾಯಿಸಿ ‘ಮಹಿಳಾ ಮುನ್ನಡೆ’ ವತಿಯಿಂದ ಶುಕ್ರವಾರ ಪೌರಾಯುಕ್ತ ಮನೋಹರ್‌ಗೆ ಮನವಿ ಸಲ್ಲಿಸಲಾಯಿತು. 
ಅಂಗನವಾಡಿ ಕೇಂದ್ರಗಳಲ್ಲಿ ವಿದ್ಯುತ್ ಇಲ್ಲದೆ ಸಾಕಷ್ಟು ತೊಂದರೆ ಅನುಭವಿಸುವಂತಾಗಿದೆ. ಈ ಹಿನ್ನಲೆಯಲ್ಲಿ ತಕ್ಷಣ ವಿದ್ಯುತ್ ಸಂಪರ್ಕ ಕಲ್ಪಿಸಿಕೊಡುವಂತೆ ಸ್ಥಳೀಯ ನಿವಾಸಿಗಳ ಸಹಿ ಸಂಗ್ರಹಿಸಿ ಒತ್ತಾಯಿಸಲಾಗಿದೆ.
ಮನವಿ ಸ್ವೀಕರಿಸಿದ ಪೌರಾಯುಕ್ತರು ಮುಂದಿನ ಒಂದು ವಾರದೊಳಗೆ ವಿದ್ಯುತ್ ಸಂಪರ್ಕ ಕಲ್ಪಿಸಿ ಕೊಡುವುದಾಗಿ ಭರವಸೆ ನೀಡಿದರು. ಮಹಿಳಾ ಮುನ್ನಡೆ ತಾಲೂಕು ಸಂಚಾಲಕಿ ಎನ್. ನಾಗವೇಣಿ  ಸದಸ್ಯರಾದ ಗೌರಿ, ಲಕ್ಷ್ಮಿ ಇನ್ನಿತರರು ಉಪಸ್ಥಿತರಿದ್ದರು.

ಕುವೆಂಪು ವಿಶ್ವ ವಿದ್ಯಾಲಯದಲ್ಲಿ ಸುಳ್ಳು ಜಾತಿ ಪ್ರಮಾಣ ಪತ್ರ ಸಲ್ಲಿಸಿ ಉದ್ಯೋಗ

ತಪ್ಪಿತಸ್ಥರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲು ಆಗ್ರಹಿಸಿ ಪ್ರತಿಭಟನೆ, ಮನವಿ 

ಸುಳ್ಳು ಜಾತಿ ಪ್ರಮಾಣ ಪತ್ರ ಸಲ್ಲಿಸಿ ಅಕ್ರಮವಾಗಿ ಸರ್ಕಾರಿ ಉದ್ಯೋಗ ಪಡೆದು ಸರ್ಕಾರಕ್ಕೆ ವಂಚಿಸಿರುವವರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿ ಭದ್ರಾವತಿ ತಾಲೂಕಿನ ಶಂಕರಘಟ್ಟದ ಕುವೆಂಪು ವಿಶ್ವ ವಿದ್ಯಾಲಯದ ಮುಂಭಾಗ ಶುಕ್ರವಾರ ಜೈಭೀಮ್ ಕನ್ನಡ ಜಾಗೃತಿ ವೇದಿಕೆ ಮತ್ತು ಎಸ್‌ಸಿ/ಎಸ್‌ಟಿ ಅಸಂಘಟಿತ ಕಾರ್ಮಿಕರ ಅಭಿವೃದ್ಧಿ ವೇದಿಕೆ ವತಿಯಿಂದ ಪ್ರತಿಭಟನೆ ನಡೆಸಲಾಯಿತು. 
ಭದ್ರಾವತಿ, ಜೂ. ೨೬:  ಸುಳ್ಳು ಜಾತಿ ಪ್ರಮಾಣ ಪತ್ರ ಸಲ್ಲಿಸಿ ಅಕ್ರಮವಾಗಿ ಸರ್ಕಾರಿ ಉದ್ಯೋಗ ಪಡೆದು ಸರ್ಕಾರಕ್ಕೆ ವಂಚಿಸಿರುವವರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿ ತಾಲೂಕಿನ ಶಂಕರಘಟ್ಟದ ಕುವೆಂಪು ವಿಶ್ವ ವಿದ್ಯಾಲಯದ ಮುಂಭಾಗ ಶುಕ್ರವಾರ ಜೈಭೀಮ್ ಕನ್ನಡ ಜಾಗೃತಿ ವೇದಿಕೆ ಮತ್ತು ಎಸ್‌ಸಿ/ಎಸ್‌ಟಿ ಅಸಂಘಟಿತ ಕಾರ್ಮಿಕರ ಅಭಿವೃದ್ಧಿ ವೇದಿಕೆ ವತಿಯಿಂದ ಪ್ರತಿಭಟನೆ ನಡೆಸಿ ಕುಲಪತಿಗಳ ಮೂಲಕ ರಾಜ್ಯಪಾಲರಿಗೆ ಮನವಿ ಸಲ್ಲಿಸಲಾಯಿತು. 
ವಿಶ್ವ ವಿದ್ಯಾಲಯದಲ್ಲಿ ಸಹಾಯಕ ಕುಲ ಸಚಿವರಾಗಿರುವ ಡಿ.ಎ ಗಾಯತ್ರಿ ಹಾಗೂ ಎಂ. ಸೀತಾರಾಮ ಹಾಗೂ ರಾಜ್ಯಶಾಸ್ತ್ರದ ವಿಭಾಗದ ಎ. ಷಣ್ಮುಗಂ ಸರ್ಕಾರಕ್ಕೆ ತಪ್ಪು ಮಾಹಿತಿ ನೀಡಿ ಸುಳ್ಳು ಜಾತಿ ಪ್ರಮಾಣ ಪತ್ರ ಪಡೆದಿರುವುದು ಇದೀಗ ಸಾಬೀತಾಗಿದೆ. ಈ ಹಿನ್ನಲೆಯಲ್ಲಿ ಜಿಲ್ಲಾಧಿಕಾರಿಗಳು ಹಾಗೂ ನ್ಯಾಯಾಲಯ ಆದೇಶದಿಂದ ಛೀಮಾರಿ ಹಾಕಿದಂತಾಗಿದೆ. ಆದರೆ ಇಂದಿನ ಕುಲಪತಿಗಳಾಗಿರುವ ಪ್ರೊ. ಬಿ.ಪಿ ವೀರಭದ್ರಪ್ಪ ತಪ್ಪಿತಸ್ಥರ ವಿರುದ್ಧ ಅಮಾನತ್ತು ಅಥವಾ ಕಾನೂನು ರೀತಿ ಯಾವುದೇ ಕ್ರಮ ಕೈಗೊಳ್ಳದೆ ನಿರ್ಲಕ್ಷ್ಯತನ ವಹಿಸಿದ್ದಾರೆ. ಜಿಲ್ಲಾಧಿಕಾರಿಗಳು ಹಾಗೂ ನ್ಯಾಯಾಲಯದ ಆದೇಶವನ್ನು ಧಿಕ್ಕರಿಸಿದ್ದಾರೆಂದು ಆರೋಪಿಸಲಾಯಿತು. 
ಈ ಹಿಂದೆ ವಿಶ್ವ ವಿದ್ಯಾಲಯದಲ್ಲಿ ಪರೀಕ್ಷಾಂಗ ಕುಲಸಚಿವರಾಗಿದ್ದ ಪ್ರೊ. ಬೋಜನಾಯ್ಕರವರು ೧.೨೭ ಕೋ. ರು. ನೇರವಾಗಿ ಲಪಟಾಯಿಸಿದ್ದು, ಈ ಸಂಬಂಧ ಅಗತ್ಯ ದಾಖಲೆಯೊಂದಿಗೆ ಪ್ರಶ್ನಿಸಿ ದೂರು ಸಲ್ಲಿಸಿದ್ದರೂ ಸಹ ಪರಿಶೀಲಿಸದೆ, ಯಾವುದೇ ಕಾನೂನು ಕ್ರಮ ಕೈಗೊಳ್ಳದೆ ಪ್ರಕರಣ ಮುಚ್ಚಿ ಹಾಕುವ ಹುನ್ನಾರ ನಡೆಸಲಾಗುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಲಾಯಿತು. 
ತಕ್ಷಣ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಂಡು ನ್ಯಾಯ ಒದಗಿಸಿಕೊಡಬೇಕು. ಇಲ್ಲವಾದಲ್ಲಿ ಮುಂದಿನ ದಿನಗಳಲ್ಲಿ ಉಗ್ರ ಹೋರಾಟ ನಡೆಸುವ ಜೊತೆಗೆ ನ್ಯಾಯಾಲಯದಲ್ಲಿ ಎಸ್‌ಸಿ/ಎಸ್‌ಟಿ ದೌರ್ಜನ್ಯ ತಡೆ ಕಾಯ್ದೆಯಡಿ ಪ್ರಕರಣ ದಾಖಲಿಸುವುದಾಗಿ ಎಚ್ಚರಿಸಲಾಯಿತು. 
ವೇದಿಕೆ ರಾಜ್ಯಾಧ್ಯಕ್ಷ ಎಸ್.ಎಸ್ ಮಂಜುನಾಥ್ ಪ್ರತಿಭಟನೆ ನೇತೃತ್ವ ವಹಿಸಿದ್ದರು. ಗೌರವಾಧ್ಯಕ್ಷ ತಿಮ್ಲಾಪುರ ಲೋಕೇಶ್, ರಾಜ್ಯ ಉಪಾಧ್ಯಕ್ಷ ಎನ್.ಪಿ ವೆಂಕಟೇಶ್, ರಾಜ್ಯ ಪ್ರಧಾನ ಕಾರ್ಯದರ್ಶಿ ಎ.ಕೆ ಹನುಮಂತಪ್ಪ ಮಂಗೋಟೆ ಮತ್ತು ಸಂಘಟನಾ ಕಾರ್ಯದರ್ಶಿ ಈ. ರಮೇಶ್ ಸೇರಿದಂತೆ ಇನ್ನಿತರರು ಪಾಲ್ಗೊಂಡಿದ್ದರು. 

೫೦ ಲಕ್ಷ ರು. ವೆಚ್ಚದ ಬಾಕ್ಸ್ ಚರಂಡಿ ಕಾಮಗಾರಿಗೆ ಭೂಮಿ ಪೂಜೆ

ಭದ್ರಾವತಿ ತಾಲೂಕಿನ ಕಾಚಗೊಂಡನಹಳ್ಳಿ ಹಾಗೂ ವಿಜಯನಗರ ಗ್ರಾಮದಲ್ಲಿ ಸುಮಾರು ೫೦ ಲಕ್ಷ ರು. ವೆಚ್ಚದ ಬಾಕ್ಸ್ ಚರಂಡಿ ಕಾಮಗಾರಿಗೆ ಶಾಸಕ ಬಿ.ಕೆ ಸಂಗಮೇಶ್ವರ್ ಭೂಮಿ ಪೂಜೆ ನೆರವೇರಿಸಿದರು. 
ಭದ್ರಾವತಿ, ಜೂ. ೨೬: ತಾಲೂಕಿನ ಕಾಚಗೊಂಡನಹಳ್ಳಿ ಹಾಗೂ ವಿಜಯನಗರ ಗ್ರಾಮದಲ್ಲಿ ಸುಮಾರು ೫೦ ಲಕ್ಷ ರು. ವೆಚ್ಚದ ಬಾಕ್ಸ್ ಚರಂಡಿ ಕಾಮಗಾರಿಗೆ ಶಾಸಕ ಬಿ.ಕೆ ಸಂಗಮೇಶ್ವರ್ ಭೂಮಿ ಪೂಜೆ ನೆರವೇರಿಸಿದರು. 
ಲೋಕಸಭಾ ಸದಸ್ಯ ಬಿ.ವೈ ರಾಘವೇಂದ್ರರವರ ಸಂಸದರ ನಿಧಿಯಿಂದ ಬಿಡುಗಡೆಯಾದ ಅನುದಾನದಲ್ಲಿ ಕಾಮಗಾರಿ ನಡೆಯುತ್ತಿದ್ದು,  ಸಂಸದರ ನಿಧಿಯಿಂದ ಬಿಡುಗಡೆಯಾದ ಅನುದಾನದಲ್ಲಿ ಮಂಜೂರಾತಿಯಾದ ರಸ್ತೆ, ಚರಂಡಿ ಕಾಮಗಾರಿಗಳು ಈಗಾಗಲೇ ತಾಲೂಕಿನ ಗ್ರಾಮೀಣ ಭಾಗಗಳಲ್ಲಿ ಪ್ರಗತಿಯಲ್ಲಿವೆ. 
ಹಿರಿಯ ನಗರಸಭಾ ಸದಸ್ಯ ವಿ. ಕದಿರೇಶ್, ಗ್ರಾಮಪಂಚಾಯತಿ ಅಧ್ಯಕ್ಷ ಕೃಷ್ಣಮೂರ್ತಿ, ಸದಸ್ಯರಾದ ಜಯರಾಮ್, ಮಂಜು, ಮುಖಂಡರಾದ ಸುದೀಪ್, ಗೋಪಾಲ್, ರಮೇಶ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು. 

೪೦ ಲಕ್ಷ ರು. ವೆಚ್ಚದ ನೂತನ ಕಟ್ಟಡ ನಿರ್ಮಾಣಕ್ಕೆ ಭೂಮಿ ಪೂಜೆ

ಭದ್ರಾವತಿ ಕೃಷಿ ಉತ್ಪನ್ನ ಮಾರುಕಟ್ಟೆ ಪ್ರಾಂಗಣದಲ್ಲಿ ಸುಮಾರು ೪೦ ಲಕ್ಷ ರು. ವೆಚ್ಚದ ತೂಕ ಮತ್ತು ಮಾಪನ ಶಾಸ್ತ್ರ ನಿರೀಕ್ಷಕರ ಕಛೇರಿಗೆ ಶುಕ್ರವಾರ ಶಾಸಕ ಬಿ.ಕೆ ಸಂಗಮೇಶ್ವರ್ ಭೂಮಿ ಪೂಜೆ ನೆರವೇರಿಸಿದರು. 
ಭದ್ರಾವತಿ, ಜೂ. ೨೬: ನಗರದ ಕೃಷಿ ಉತ್ಪನ್ನ ಮಾರುಕಟ್ಟೆಯಲ್ಲಿ ನೂತನವಾಗಿ ನಿರ್ಮಾಣಗೊಳ್ಳುತ್ತಿರುವ ಸುಮಾರು ೪೦ ಲಕ್ಷ ರು. ವೆಚ್ಚದ ತೂಕ ಮತ್ತು ಮಾಪನ ಶಾಸ್ತ್ರ ನಿರೀಕ್ಷಕರ ಕಛೇರಿಗೆ ಶುಕ್ರವಾರ ಶಾಸಕ ಬಿ.ಕೆ ಸಂಗಮೇಶ್ವರ್ ಭೂಮಿ ಪೂಜೆ ನೆರವೇರಿಸಿದರು. 
ಬಹಳ ವರ್ಷಗಳಿಂದ ಸ್ವಂತ ಕಟ್ಟಡವಿಲ್ಲದೆ ಕನಕನಗರದ ಖಾಸಗಿ ಕಟ್ಟಡದಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ತೂಕ ಮತ್ತು ಮಾಪನ ಶಾಸ್ತ್ರ ನಿರೀಕ್ಷಕರ ಕಛೇರಿಗೆ ಇದೀಗ ಕೃಷಿ ಉತ್ಪನ್ನ ಮಾರುಕಟ್ಟೆ ಪ್ರಾಂಗಣದಲ್ಲಿ ಸ್ಥಳವಕಾಶ ಕಲ್ಪಿಸಲಾಗಿದ್ದು, ನೂತನ ಕಟ್ಟಡ ಶೀಘ್ರದಲ್ಲಿಯೇ ನಿರ್ಮಾಣಗೊಳ್ಳಲಿದೆ. 
ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ ಅಧ್ಯಕ್ಷ ಲವೇಶ್‌ಗೌಡ, ಕಾರ್ಯದರ್ಶಿ ಸತೀಶ್ ಮತ್ತು ನಿರ್ದೇಶಕರು ಹಾಗೂ ತೂಕ ಮತ್ತು ಮಾಪನ ಶಾಸ್ತ್ರ ನಿರೀಕ್ಷಕರ ಕಛೇರಿಯ ಅಧಿಕಾರಿಗಳು, ಸಿಬ್ಬಂದಿಗಳು ಉಪಸ್ಥಿತರಿದ್ದರು. 

Thursday, June 25, 2020

ಲಾರಿ ಚಾಲಕನಿಗೂ ಕೊರೋನಾ ವೈರಸ್ : ಹಳೇನಗರ ಭಾಗದಲ್ಲಿ ಆತಂಕ

ಭದ್ರಾವತಿ, ಜೂ. ೨೫: ಹಳೇನಗರದ ಬಸವೇಶ್ವರ ವೃತ್ತದ ಉಪ್ಪಾರರ ಬೀದಿ ನಿವಾಸಿ, ಲಾರಿ ಚಾಲಕರೊಬ್ಬರಿಗೆ ಕೊರೋನಾ ವೈರಸ್ ಹರಡಿರುವ ಸಾಧ್ಯತೆ ಹೆಚ್ಚಾಗಿದ್ದು, ಗುರುವಾರ ಶಿವಮೊಗ್ಗ ಮೆಗ್ಗಾನ್ ಕೋವಿಡ್-೧೯ ಆಸ್ಪತ್ರೆಗೆ ದಾಖಲಿಸಲಾಗಿದೆ. 
ಜೂ.೧೯ರಂದು ಚಾಲಕ ತುಮಕೂರಿಗೆ ಪ್ರಯಾಣ ಬೆಳೆಸಿದ್ದು, ೨೧ರಂದು ನಗರಕ್ಕೆ ಹಿಂದಿರುಗಿದ್ದಾರೆ. ಇದ್ದಕ್ಕಿದ್ದಂತೆ ಅನಾರೋಗ್ಯ ಕಾಣಿಸಿಕೊಂಡಿದ್ದು, ಖಾಸಗಿ ಆಸ್ಪತ್ರೆಯೊಂದರಲ್ಲಿ ಚಿಕಿತ್ಸೆ ಪಡೆಯಲು ತೆರಳಿದ್ದಾಗ ಕೊರೋನಾ ವೈರಸ್ ಹರಡಿರುವ ಸಾಧ್ಯತೆ ಇರುವುದಾಗಿ ತಿಳಿಸಿದ್ದಾರೆ. ಈ ಹಿನ್ನಲೆಯಲ್ಲಿ ಕೋವಿಡ್-೧೯ ಆಸ್ಪತ್ರೆಗೆ ಕರೆದೊಯ್ಯಲಾಯಿತು ಎನ್ನಲಾಗಿದೆ. 
ನಗರಸಭೆ ಆಡಳಿತ ಮುನ್ನಚ್ಚರಿಕೆ ಕ್ರಮವಾಗಿ ಚಾಲಕ ವಾಸವಿದ್ದ ಮನೆಯ ಸುತ್ತಮುತ್ತ ೧೦೦ ಹಾಗೂ ೨೦೦ ಮೀಟರ್ ವ್ಯಾಪ್ತಿಯಲ್ಲಿ ಕಂಟೈನ್‌ಮೆಂಟ್ ವಲಯವಾಗಿಸಿದ್ದು, ಮುಂದಿನ ಕ್ರಮಕ್ಕೆ ಜಿಲ್ಲಾಡಳಿತಕ್ಕೆ ವರದಿ ಸಲ್ಲಿಸಲಿದ್ದಾರೆ. ಈ ಹಿಂದೆ ಚನ್ನಗಿರಿ ರಸ್ತೆಯಲ್ಲಿ ಮಹಿಳೆಯೊಬ್ಬರಲ್ಲಿ ವೈರಸ್ ಕಾಣಿಸಿಕೊಂಡಿತ್ತು. ಈ ಹಿನ್ನಲೆಯಲ್ಲಿ ೪-೫ ದಿನಗಳ ವರೆಗೆ ರಂಗಪ್ಪ ವೃತ್ತದಿಂದ ಹೊಳೆಹೊನ್ನೂರು ವೃತ್ತದ ವರೆಗೆ ಸೀಲ್‌ಡೌನ್ ಘೋಷಿಸಲಾಗಿತ್ತು. 

ಶ್ರೀ ಕಾಲಭೈರವೇಶ್ವರ ಚಾರಿಟಬಲ್ ಟ್ರಸ್ಟ್ ಮಹಿಳಾ ಘಟಕದ ವತಿಯಿಂದ ಕೊರೋನಾ ವಾರಿಯರ್ಸ್‌ಗಳಿಗೆ ಅಭಿನಂದನೆ

ಮಹಾಮಾರಿ ಕೊರೋನಾ ವೈರಸ್ ವಿರುದ್ಧ ಹೋರಾಟ ನಡೆಸುತ್ತಿರುವ ವಾರಿಯರ್ಸ್‌ಗಳಾದ ವೈದ್ಯರು, ಆಶಾ ಕಾರ್ಯಕರ್ತೆಯರು, ನರ್ಸ್ ಹಾಗೂ ಆರೋಗ್ಯ ಇಲಾಖೆ ಸಿಬ್ಬಂದಿಗಳಿಗೆ ಭದ್ರಾವತಿ ಜನ್ನಾಪುರ ಎನ್‌ಟಿಬಿ ಕಛೇರಿ ಆವರಣದಲ್ಲಿರುವ ನಗರ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಗುರುವಾರ ಶ್ರೀ ಕಾಲಭೈರವೇಶ್ವರ ಚಾರಿಟಬಲ್ ಟ್ರಸ್ಟ್ ಮಹಿಳಾ ಘಟಕದ ವತಿಯಿಂದ ಭಿನಂದಿಸಲಾಯಿತು. 
ಭದ್ರಾವತಿ, ಜೂ. ೨೫: ಮಹಾಮಾರಿ ಕೊರೋನಾ ವೈರಸ್ ವಿರುದ್ಧ ಹೋರಾಟ ನಡೆಸುತ್ತಿರುವ ವಾರಿಯರ್ಸ್‌ಗಳಾದ ವೈದ್ಯರು, ಆಶಾ ಕಾರ್ಯಕರ್ತೆಯರು, ನರ್ಸ್ ಹಾಗೂ ಆರೋಗ್ಯ ಇಲಾಖೆ ಸಿಬ್ಬಂದಿಗಳಿಗೆ  ಶ್ರೀ ಕಾಲಭೈರವೇಶ್ವರ ಚಾರಿಟಬಲ್ ಟ್ರಸ್ಟ್ ಮಹಿಳಾ ಘಟಕದ ವತಿಯಿಂದ ಗುರುವಾರ ಅಭಿನಂದಿಸಲಾಯಿತು. 
ಜನ್ನಾಪುರ ನಗರಸಭೆ ಶಾಖಾ ಕಛೇರಿ(ಎನ್‌ಟಿಬಿ) ಆವರಣದಲ್ಲಿರುವ ನಗರ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಕೊರೋನಾ ವಾರಿಯರ್ಸ್‌ಗಳ ಕರ್ತವ್ಯವನ್ನು ಶ್ಲಾಘಿಸಿ ಅಭಿನಂದಿಸುವ ಜೊತೆಗೆ ಭಾರತ ಮತ್ತು ಚೀನಾ ಸೈನಿಕರ ನಡುವೆ ನಡೆದ ಸಂಘರ್ಷದಲ್ಲಿ ಹುತಾತ್ಮರಾದ ವೀರ ಯೋಧರಿಗೆ ಶ್ರದ್ದಾಂಜಿಲಿ ಸಲ್ಲಿಸಿ ಗೌರವ ಸೂಚಿಸಲಾಯಿತು. 
ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯೆ ಡಾ. ಆರ್. ಕವಿತಾ, ಶ್ರೀ ಕಾಲಭೈರವೇಶ್ವರ ಚಾರಿಟಬಲ್ ಟ್ರಸ್ಟ್ ಮಹಿಳಾ ಘಟಕದ ಅಧ್ಯಕ್ಷೆ ಶಿವಮ್ಮ ಶ್ರಿನಿವಾಸ್, ಉಪಾಧ್ಯಕ್ಷೆ ಧನಲಕ್ಷ್ಮಿ ರಾಮಣ್ಣ, ಲಾಬ್ ಟೆಕ್ನಿಷಿಯನ್ ಸಚಿನ್ ಸೇರಿದಂತೆ ಟ್ರಸ್ಟ್ ಮಹಿಳಾ ಘಟಕದ ೨೧ ಮಂದಿ ಪದಾಧಿಕಾರಿಗಳು ಉಪಸ್ಥಿತರಿದ್ದರು. 
ಆಶಾ ಕಾರ್ಯಕರ್ತೆಯರು, ವೈದ್ಯರು, ನರ್ಸ್‌ಗಳು ಮತ್ತು ಸಿಬ್ಬಂದಿಗಳು ಸೇರಿದಂತೆ ಸುಮಾರು ೨೫ಕ್ಕೂ ಹೆಚ್ಚು ಮಂದಿಯನ್ನು ಅಭಿನಂದಿಸಲಾಯಿತು. 

೪೦೦೧ ವಿದ್ಯಾರ್ಥಿಗಳು ಎಸ್‌ಎಸ್‌ಎಲ್‌ಸಿ ಪರೀಕ್ಷೆಗೆ ಹಾಜರು

ಭದ್ರಾವತಿ ನ್ಯೂಟೌನ್ ಸರ್ಕಾರಿ ರಜಿತ ಮಹೋತ್ಸವ ಬಾಲಕರ ಪದವಿ ಪೂರ್ವ ಕಾಲೇಜಿನ ಪ್ರೌಢಶಾಲೆ ವಿಭಾಗದ ಎಸ್‌ಎಸ್‌ಎಲ್‌ಸಿ ಪರೀಕ್ಷಾ ಕೇಂದ್ರದ ಸುತ್ತಮುತ್ತ ಬಿಗಿ ಪೊಲೀಸ್ ಬಂದೋಬಸ್ತ್ ಕೈಗೊಳ್ಳಲಾಗಿತ್ತು.
ಭದ್ರಾವತಿ, ಜೂ. ೨೫: ತಾಲೂಕಿನಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಮೊದಲ ದಿನವಾದ ಗುರುವಾರ ಯಶಸ್ವಿಯಾಗಿ ನಡೆದಿದ್ದು, ಪರೀಕ್ಷೆಗೆ ಹಾಜರಾಗಬೇಕಿದ್ದ ಒಟ್ಟು ೪೧೭೬ ವಿದ್ಯಾರ್ಥಿಗಳ ಪೈಕಿ ೪೦೦೧ ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದಾರೆ.
ಕೊರೋನಾ ವೈರಸ್ ವ್ಯಾಪಕವಾಗಿ ಹರಡುತ್ತಿರುವ ಹಿನ್ನಲೆಯಲ್ಲಿ ಹೆಚ್ಚಿನ ಸುರಕ್ಷತಾ ಕ್ರಮಗಳೊಂದಿಗೆ ಕಳೆದ ಸುಮಾರು ೨ ತಿಂಗಳಿನಿಂದ ಆರೋಗ್ಯ ಮತ್ತು ಪೊಲೀಸ್ ಇಲಾಖೆ ಸೇರಿದಂತೆ ಸರ್ಕಾರದ ಇನ್ನಿತರ ಇಲಾಖೆಗಳ ಸಹಕಾರದೊಂದಿಗೆ ಶಿಕ್ಷಣ ಇಲಾಖೆ ನಿರಂತರವಾಗಿ ಸಿದ್ದತಾ ಕಾರ್ಯಗಳಲ್ಲಿ ತೊಡಗಿಸಿಕೊಂಡಿತ್ತು. ಇದರ ಪರಿಣಾಮ ಪರೀಕ್ಷೆ ಮೊದಲ ದಿನ ಯಶಸ್ವಿಯಾಗಿದೆ.
ಪತ್ರಿಕೆಯೊಂದಿಗೆ ಮಾತನಾಡಿದ ಕ್ಷೇತ್ರ ಶಿಕ್ಷಣಾಧಿಕಾರಿ ಟಿ.ಎನ್ ಸೋಮಶೇಖರಯ್ಯ, ಈ ಬಾರಿ ಪರೀಕ್ಷೆಗೆ ಹಾಜರಾಗಬೇಕಿದ್ದ ಒಟ್ಟು ೪೧೭೬ ವಿದ್ಯಾರ್ಥಿಗಳ ಪೈಕಿ ೪೦೦೧ ವಿದ್ಯಾರ್ಥಿಗಳು ಹಾಜರಿದ್ದು, ೧೭೫ ವಿದ್ಯಾರ್ಥಿಗಳು ಗೈರು ಹಾಜರಾಗಿದ್ದಾರೆ. ಉಳಿದಂತೆ ೨ ವಿದ್ಯಾರ್ಥಿಗಳು ಕಂಟೈನ್‌ಮೆಂಟ್ ಪ್ರದೇಶಗಳಿಂದ ಬಂದಿದ್ದು,  ಅನಾರೋಗ್ಯ ಕಾರಣದಿಂದ ವಿಶೇಷ ಕೊಠಡಿಯಲ್ಲಿ ೮ ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದಾರೆ. ಉಳಿದಂತೆ ಸರ್ಕಾರಿ ಹಾಗೂ ಖಾಸಗಿ ವಸತಿ ನಿಲಯಗಳಲ್ಲಿ ಒಟ್ಟು ೩೮ ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು, ೭೭ ವಲಸೆ ವಿದ್ಯಾರ್ಥಿಗಳು ಈ ಬಾರಿ ಪರೀಕ್ಷೆ ಬರೆದಿದ್ದಾರೆ.  ೧೫ ವಿದ್ಯಾರ್ಥಿಗಳಿಗೆ ಪರೀಕ್ಷಾ ಕೇಂದ್ರಗಳಿಗೆ ಬರಲು ಸಾರಿಗೆ ವ್ಯವಸ್ಥೆ ಕಲ್ಪಿಸಲಾಗಿತ್ತು ಎಂದರು.
ಪರೀಕ್ಷಾ ಕೇಂದ್ರದ ಸುತ್ತಮುತ್ತ ಬ್ಯಾರಿಗೇಡ್‌ಗಳನ್ನು ಅಳವಡಿಸಿ ಬಿಗಿ ಬಂದೋಬಸ್ತ್ ಕೈಗೊಳ್ಳಲಾಗಿತ್ತು. ಪರೀಕ್ಷಾ ಕೇಂದ್ರದ ಹೊರ ಭಾಗದಲ್ಲಿ ವಿದ್ಯಾರ್ಥಿಗಳಿಗೆ ಥರ್ಮೋ ಸ್ಕ್ರೀನಿಂಗ್ ಯಂತ್ರದ ಮೂಲಕ ಆರೋಗ್ಯ ತಪಾಸಣೆ ನಡೆಸಲಾಯಿತು. ಪರೀಕ್ಷೆ ಹಾಜರಾದ ವಿದ್ಯಾರ್ಥಿಗಳಿಗೆ ಶಿಕ್ಷಣ ಇಲಾಖೆ ವತಿಯಿಂದ ಮಾಸ್ಕ್ ಹಾಗೂ ಸ್ಯಾನಿಟೈಸರ್ ವಿತರಿಸಲಾಯಿತು.