ಭದ್ರಾವತಿಯಲ್ಲಿ ಆ.5ರಂದು ಲೋಕಾರ್ಪಣೆಗೊಳ್ಳಲಿರುವ ಸರ್.ಎಂ ವಿಶ್ವೇಶ್ವರಯ್ಯನವರ ಪ್ರತಿಮೆಯೊಂದಿಗೆ ಶಿಲ್ಪ ಕಲಾವಿದ ಎಸ್.ಜಿ ಶಂಕರಮೂರ್ತಿ ಉಪಸ್ಥಿತರಿರುವುದು.
ಭದ್ರಾವತಿ, ಜು. 25: ಸುಮಾರು 2 ವರ್ಷಗಳಿಂದ ಲೋಕಾರ್ಪಣೆಗೊಳ್ಳದೆ ನೆನೆಗುದಿಗೆ ಬಿದ್ದಿರುವ ನಗರದ ರೈಲ್ವೆ ನಿಲ್ದಾಣದ ಬಳಿ ಬಿ.ಎಚ್ ರಸ್ತೆಗೆ ಹೊಂದಿಕೊಂಡಿರುವ ನಿಲ್ದಾಣದ ದ್ವಾರಬಾಗಿಲಿನಲ್ಲಿ ಪ್ರತಿಷ್ಠಾಪಿಸಲಾಗಿರುವ ನಗರದ ಅನ್ನದಾತ, ಭಾರತರತ್ನ ಸರ್.ಎಂ ವಿಶ್ವೇಶ್ವರಯ್ಯನವರ ಪ್ರತಿಮೆಗೆ ಕೊನೆಗೂ ಮುಕ್ತಿ ಲಭಿಸಿದೆ.
ರೈಲ್ವೆ ಸಲಹಾ ಸಮಿತಿ ಸದಸ್ಯರಾಗಿ ನಗರದ ಹಿರಿಯ ಬಿಜೆಪಿ ಮುಖಂಡ ಎನ್. ವಿಶ್ವನಾಥರಾವ್ ನೇಮಕಗೊಂಡ ನಂತರ ನಗರದ ರೈಲ್ವೆ ನಿಲ್ದಾಣದ ಅಭಿವೃದ್ಧಿ ಹಂತ ಹಂತವಾಗಿ ನಡೆಯುತ್ತಿದ್ದು, ನಿಲ್ದಾಣದ ಒಳ ಹಾಗೂ ಹೊರ ಭಾಗದಲ್ಲಿ ರೈಲ್ವೆ ಇಲಾಖೆ ಅನುದಾನದ ಜೊತೆಗೆ ಲೋಕಸಭಾ ಸದಸ್ಯರು, ಸ್ಥಳೀಯ ಶಾಸಕರು, ನಗರಸಭೆ ಆಡಳಿತ ಹಾಗೂ ವಿವಿಧ ಸಂಘ-ಸಂಸ್ಥೆಗಳ ಆರ್ಥಿಕ ನೆರವಿನೊಂದಿಗೆ ಸಾಕಷ್ಟು ಅಭಿವೃದ್ದಿ ಕಾರ್ಯಗಳನ್ನು ಕೈಗೊಳ್ಳಲಾಗಿದೆ.
ಈ ನಡುವೆ ನಗರದ ಅನ್ನದಾತ, ಭಾರತರತ್ನ ಸರ್.ಎಂ. ವಿಶ್ವೇಶ್ವರಯ್ಯನವರಿಗೆ ಗೌರವ ಸಲ್ಲಿಸುವ ಉದ್ದೇಶದಿಂದ ಅವರ ಪ್ರತಿಮೆ ಪ್ರತಿಷ್ಠಾಪಿಸಲಾಗಿದೆ. ಈ ಪ್ರತಿಮೆ ನಿರ್ಮಾಣ ಕಾರ್ಯವನ್ನು ಸಿದ್ದರೂಢನಗರದ ರಂಗದಾಸೋಹಿ, ಹಿರಿಯ ಶಿಲ್ಪ ಕಲಾವಿದ ಎಸ್.ಜಿ ಶಂಕರಮೂರ್ತಿ ವಹಿಸಿಕೊಂಡಿದ್ದರು. ಮೇ, 2018ರಂದು ಸುಮಾರು 8.5 ಅಡಿ ಎತ್ತರದ ಪ್ರತಿಮೆ ನಿರ್ಮಾಣ ಕಾರ್ಯಕ್ಕೆ ಚಾಲನೆ ನೀಡಿ ಶೀಘ್ರವಾಗಿ ಮುಕ್ತಾಯಗೊಳಿಸಿದ್ದರು. ನಂತರ ನಿಗದಿತ ಸ್ಥಳದಲ್ಲಿ ಪ್ರತಿಮೆ ಪ್ರತಿಷ್ಠಾಪನೆಗೊಂಡರೂ ಸಹ ಲೋಕಾರ್ಪಣೆಗೊಳ್ಳದೆ ನೆನೆಗುದಿಗೆ ಬಿದ್ದಿತ್ತು. ಸಾರ್ವಜನಿಕರು, ವಿವಿಧ ಸಂಘ-ಸಂಸ್ಥೆಗಳು ಪ್ರತಿಮೆ ಅನಾವರಣಗೊಳಿಸುವಂತೆ ಹಲವು ಬಾರಿ ಒತ್ತಾಯಿಸಿದ್ದವು.
ಇದೀಗ ಆ.05ರಂದು ಬೆಳಿಗ್ಗೆ 11 ಗಂಟೆಗೆ ಲೋಕಾರ್ಪಣೆ ಸಮಾರಂಭ ನಡೆಯಲಿದ್ದು, ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್ ಈಶ್ವರಪ್ಪ, ಸಂಸದ ಬಿ.ವೈ ರಾಘವೇಂದ್ರ, ವಿಧಾನಪರಿಷತ್ ಸದಸ್ಯರಾದ ಆಯನೂರು ಮಂಜುನಾಥ್, ಎಸ್. ರುದ್ರೇಗೌಡ, ಬಿಜೆಪಿ ಜಿಲ್ಲಾಧ್ಯಕ್ಷ ಮೇಘರಾಜ್, ಶಾಸಕ ಬಿ.ಕೆ ಸಂಗಮೇಶ್ವರ್, ಮಾಜಿ ಶಾಸಕ ಎಂ.ಜೆ ಅಪ್ಪಾಜಿ, ಜಿ.ಪಂ. ಅಧ್ಯಕ್ಷೆ ಜ್ಯೋತಿ ಎಸ್. ಕುಮಾರ್, ನಗರಸಭೆ ಪೌರಾಯುಕ್ತ ಮನೋಹರ್, ರೈಲ್ವೆ ಇಲಾಖೆ ಅಧಿಕಾರಿಗಳು ಹಾಗೂ ವಿವಿಧ ಸಂಘ-ಸಂಸ್ಥೆಗಳ ಪ್ರಮುಖರು, ಗಣ್ಯರು ಪಾಲ್ಗೊಳ್ಳಲಿದ್ದಾರೆ. ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಯಶಸ್ವಿಗೊಳಿಸುವಂತೆ ಕೋರಲಾಗಿದೆ.