ಎಂ.ಜೆ ಅಪ್ಪಾಜಿ ಸಂತಾಪ ಸೂಚಕ ಸಭೆಯಲ್ಲಿ ಕೆ.ಟಿ ಗಂಗಾಧರ್
ಭದ್ರಾವತಿ ಹಳೇನಗರದ ಪತ್ರಿಕಾಭವನದಲ್ಲಿ ಕರ್ನಾಟಕ ರಾಜ್ಯ ರೈತ ಸಂಘ ಹಾಗು ಹಸಿರು ಸೇನೆ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ಕಾರ್ಯಕ್ರಮದಲ್ಲಿ ೩ ದಿನಗಳ ಹಿಂದೆ ನಿಧನ ಹೊಂದಿದ ಮಾಜಿ ಶಾಸಕ ಎಂ.ಜೆ ಅಪ್ಪಾಜಿಯವರಿಗೆ ಶ್ರದ್ದಾಂಜಲಿ ಸಲ್ಲಿಸಲಾಯಿತು.
ಭದ್ರಾವತಿ, ಸೆ. ೫: ಜನರ ಸಂಕಷ್ಟಗಳಿಗೆ ಮಿಡಿಯುವ ಹೃದಯವಂತಿಕೆಯ ಗುಣ ಮಾಜಿ ಶಾಸಕ ಎಂ.ಜೆ ಅಪ್ಪಾಜಿ ಹೊಂದಿದ್ದರು. ಈ ಹಿನ್ನಲೆಯಲ್ಲಿ ಅವರು ಜನಾನುರಾಗಿಯಾಗಿ ಜನರ ಮನಸ್ಸಿನಲ್ಲಿ ಶಾಶ್ವತವಾಗಿ ಉಳಿದುಕೊಂಡಿದ್ದಾರೆಂದು ಕರ್ನಾಟಕ ರಾಜ್ಯ ರೈತ ಸಂಘ ಹಾಗು ಹಸಿರು ಸೇನೆ ವರಿಷ್ಠ ಕೆ.ಟಿ ಗಂಗಾಧರ್ ಬಣ್ಣಿಸಿದರು.
ಅವರು ಹಳೇನಗರದ ಪತ್ರಿಕಾಭವನದಲ್ಲಿ ಕರ್ನಾಟಕ ರಾಜ್ಯ ರೈತ ಸಂಘ ಹಾಗು ಹಸಿರು ಸೇನೆ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ಅಪ್ಪಾಜಿಯವರಿಗೆ ಶ್ರದ್ದಾಂಜಲಿ ಕಾರ್ಯಕ್ರಮದ ನೇತೃತ್ವ ವಹಿಸಿ ಮಾತನಾಡಿದರು.
ಜನಪ್ರತಿನಿಧಿಯಾಗಿ ಚುನಾಯಿತಗೊಂಡ ಅಪ್ಪಾಜಿಯವರು ಯಾವುದೇ ಪಕ್ಷಕ್ಕೆ ಅಂಟಿಕೊಳ್ಳದೆ, ಯಾರ ಹಿಡಿತಕ್ಕೂ ಒಳಗಾಗದೆ ಜನ ಸೇವೆಯಲ್ಲಿ ತೊಡಗಿಸಿಕೊಂಡಿದ್ದರು. ಅವರಲ್ಲಿನ ರೈತಪರ, ಕಾರ್ಮಿಕರಪರ, ಬಡವರಪರ ಕಾಳಜಿ, ಬದ್ಧತೆಗಳು, ವಿಧಾನಸಭೆಯಲ್ಲಿ ಅವರ ಚರ್ಚೆಗಳು ಎಲ್ಲವೂ ಮೆಚ್ಚುಗೆ ತರುತ್ತವೆ. ಅವರಲ್ಲಿ ಸಾಮಾಜವಾದಿ ಗುಣಗಳು ಕಂಡು ಬರುತ್ತಿದ್ದವು. ಈ ಹಿನ್ನಲೆಯಲ್ಲಿ ಅವರ ಅಗಲಿಕೆ ಸಮಾಜಕ್ಕೆ ತುಂಬಾ ನಷ್ಟವನ್ನುಂಟು ಮಾಡಿದೆ ಎಂದರು.
ಕೊರೋನಾ ಸೋಂಕು ವ್ಯಾಪಕವಾಗಿ ಹರಡುತ್ತಿದ್ದು, ಸರ್ಕಾರ ಸೋಂಕು ಹೆಚ್ಚಿನ ರೀತಿಯಲ್ಲಿ ಹರಡದಂತೆ ಎಚ್ಚರವಹಿಸಬೇಕು. ಈ ಸೋಂಕಿನಿಂದ ಬಡವರನ್ನು ರಕ್ಷಿಸಲು ಎಲ್ಲಾ ರೀತಿಯ ಕ್ರಮಗಳನ್ನು ಕೈಗೊಳ್ಳಬೇಕೆಂದು ಆಗ್ರಹಿಸಿದರು.
ಹಿರಿಯ ರೈತ ಮುಖಂಡ ಯಶವಂತರಾವ್ ಘೋರ್ಪಡೆ ಮಾತನಾಡಿದರು. ಸಂಘದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಡಿ.ವಿ ವೀರೇಶ್ ಪ್ರಾಸ್ತಾವಿಕ ನುಡಿಗಳನ್ನಾಡಿದರು.
ಸಂಘದ ತಾಲೂಕು ಶಾಖೆ ಅಧ್ಯಕ್ಷ ಎಚ್.ಪಿ ಹಿರಿಯಣ್ಣಯ್ಯ, ಪ್ರಧಾನ ಕಾರ್ಯದರ್ಶಿ ರಾಮಚಂದ್ರರಾವ್ ಘೋರ್ಪಡೆ, ರೈತ ಮುಖಂಡ ಮಂಜಪ್ಪ ಗೌಡ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.