ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ, ಸಾರ್ವಜನಿಕ ಶಿಕ್ಷಣ ಇಲಾಖೆ, ಶಿವಮೊಗ್ಗ ಹಾಗು ತಾಲೂಕು ಶಿಕ್ಷಕರ ದಿನಾಚರಣೆ ಸಮಿತಿ ವತಿಯಿಂದ ಭದ್ರಾವತಿ ನಗರಸಭೆ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದ್ದ ಡಾ. ಸರ್ವಪಲ್ಲಿ ರಾಧಾಕೃಷ್ಣನ್‌ರವರ ಜನ್ಮ ದಿನಾಚರಣೆ, ಶಿಕ್ಷಕರ ದಿನಾಚರಣೆ ಕಾರ್ಯಕ್ರಮವನ್ನು ಶಾಸಕ ಬಿ.ಕೆ ಸಂಗಮೇಶ್ವರ್ ಉದ್ಘಾಟಿಸಿದರು.
ಭದ್ರಾವತಿ, ಸೆ. ೫: ಪ್ರತಿಯೊಬ್ಬರ ಉಜ್ವಲ ಭವಿಷ್ಯ ರೂಪಿಸುವ ಶಕ್ತಿ ಗುರುಗಳಿಗಿದ್ದು, ಸಮಾಜಕ್ಕೆ ಅವರ ಕೊಡುಗೆ ಅನನ್ಯವಾಗಿದೆ ಎಂದು ಶಾಸಕ ಬಿ.ಕೆ ಸಂಗಮೇಶ್ವರ್ ಹೇಳಿದರು.
ಅವರು ಶನಿವಾರ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ, ಸಾರ್ವಜನಿಕ ಶಿಕ್ಷಣ ಇಲಾಖೆ, ಶಿವಮೊಗ್ಗ ಹಾಗು ತಾಲೂಕು ಶಿಕ್ಷಕರ ದಿನಾಚರಣೆ ಸಮಿತಿ ವತಿಯಿಂದ ನಗರಸಭೆ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದ್ದ ಡಾ. ಸರ್ವಪಲ್ಲಿ ರಾಧಾಕೃಷ್ಣನ್‌ರವರ ಜನ್ಮ ದಿನಾಚರಣೆ, ಶಿಕ್ಷಕರ ದಿನಾಚರಣೆ ಉದ್ಘಾಟಿಸಿ ಮಾತನಾಡಿದರು.
ಗುರುಗಳು ಇಲ್ಲದಿದ್ದಲ್ಲಿ ಸಮಾಜ ಸರಿದಾರಿಯಲ್ಲಿ ಸಾಗಲು ಸಾಧ್ಯವಿಲ್ಲ. ಅವರು ನಮ್ಮನ್ನು ಸನ್ಮಾರ್ಗದಲ್ಲಿ ಕರೆದೊಯ್ಯುವ ಬಹುದೊಡ್ಡ ಜವಾಬ್ದಾರಿ ಹೊಂದಿದ್ದಾರೆ. ನಾವುಗಳು ಭವಿಷ್ಯದಲ್ಲಿ ಏನಾದರೂ ಉನ್ನತಿ ಸಾಧಿಸಲು ಸಾಧ್ಯ ಎಂದರೆ ಅದು ಗುರುಗಳ ಮಾರ್ಗದರ್ಶನಿಂದ ಮಾತ್ರ ಈ ಹಿನ್ನಲೆಯಲ್ಲಿ ಗುರುಗಳನ್ನು ನೆನೆಪು ಮಾಡಿಕೊಳ್ಳುವುದು ನಮ್ಮೆಲ್ಲರ ಕರ್ತವ್ಯವಾಗಿದೆ ಎಂದರು.
ಮಾಜಿ ರಾಷ್ಟ್ರಪತಿ, ಶಿಕ್ಷಣ ತಜ್ಞ ಡಾ. ಸರ್ವಪಲ್ಲಿ ರಾಧಾಕೃಷ್ಣನ್‌ರವರು ಬಡತನದಲ್ಲಿ ಹುಟ್ಟಿ ಈ ದೇಶಕ್ಕೆ ತಮ್ಮದೇ ಆದ ಕೊಡುಗೆಯನ್ನು ನೀಡಿದ್ದಾರೆ. ನಾವೆಲ್ಲರೂ ಅವರ ಆದರ್ಶಗಳೊಂದಿಗೆ ಮುನ್ನಡೆಬೇಕಾಗಿದೆ. ಪ್ರಸ್ತುತ ಶಿಕ್ಷಕರು ಹಲವಾರು ಸವಾಲುಗಳನ್ನು ಎದುರಿಸುತ್ತಿದ್ದು, ಅವರ ಸಮಸ್ಯೆಗಳಿಗೆ ಪೂರಕವಾಗಿ ಸ್ಪಂದಿಸುವುದಾಗಿ ಭರವಸೆ ನೀಡಿದರು.
ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ತಾಲೂಕು ಶಾಖೆ ಅಧ್ಯಕ್ಷ ಎನ್. ಕೃಷ್ಣಪ್ಪ ಮಾತನಾಡಿದರು. ತಾಲೂಕು ಪಂಚಾಯಿತಿ ಅಧ್ಯಕ್ಷೆ ಡಿ. ಲಕ್ಷ್ಮೀದೇವಿ, ಕಾರ್ಯನಿರ್ವಹಣಾಧಿಕಾರಿ ಡಾ. ಜಿ. ಮಂಜುನಾಥ್, ತಹಸೀಲ್ದಾರ್ ಎಚ್.ಸಿ ಶಿವಕುಮಾರ್, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಎಂ.ಎಸ್ ಬಸವರಾಜ್ ಮತ್ತು ಲಯನ್ಸ್ ಕ್ಲಬ್ ಅಧ್ಯಕ್ಷರು ಮತ್ತು ಪದಾಧಿಕಾರಿಗಳು ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು. ಕ್ಷೇತ್ರ ಶಿಕ್ಷಣಾಧಿಕಾರಿ ಟಿ.ಎನ್ ಸೋಮಶೇಖರಯ್ಯ ಸ್ವಾಗತಿಸಿದರು.
ಕಾರ್ಯಕ್ರಮದಲ್ಲಿ ಸುಮಾರು ೩೬ ಶಿಕ್ಷಕರನ್ನು ಸನ್ಮಾನಿಸಿ ಗೌರವಿಸಲಾಯಿತು. ಶಿಕ್ಷಣ ಇಲಾಖೆ ಅಧಿಕಾರಿಗಳು, ಶಿಕ್ಷಕರು ಹಾಗೂ ವಿವಿಧ ಸಂಘಟನೆಗಳ ಪ್ರಮುಖರು ಪಾಲ್ಗೊಂಡಿದ್ದರು.