ಶಾಸಕ ಬಿ.ಕೆ ಸಂಗಮೇಶ್ವರ್ ಅಧಿಕಾರಿಗಳಿಗೆ ಸೂಚನೆ
ಭದ್ರಾವತಿ ನಗರಸಭೆ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದ್ದ ವಿವಿಧ ಇಲಾಖೆಗಳ ಅಧಿಕಾರಿಗಳ ಸಭೆಯ ಅಧ್ಯಕ್ಷತೆವಹಿಸಿ ಶಾಸಕ ಬಿ.ಕೆ ಸಂಗಮೇಶ್ವರ್ ಮಾತನಾಡಿದರು.
ಭದ್ರಾವತಿ, ಸೆ. ೮: ತಾಲೂಕಿನಾದ್ಯಂತ ವಿವಿಧ ವಸತಿ ಯೋಜನೆಯಡಿ ಅರ್ಹ ಫಲಾನುಭವಿಗಳಿಗೆ ನಿವೇಶನಗಳನ್ನು ನೀಡುವ ಸಂಬಂಧ ಅಗತ್ಯ ಕ್ರಮ ಕೈಗೊಳ್ಳುವಂತೆ ಶಾಸಕ ಬಿ.ಕೆ ಸಂಗಮೇಶ್ವರ್ ಅಧಿಕಾರಿಗಳಿಗೆ ಸೂಚಿಸಿದರು.
ಅವರು ಮಂಗಳವಾರ ನಗರಸಭೆ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದ್ದ ವಿವಿಧ ಇಲಾಖೆಗಳ ಅಧಿಕಾರಿಗಳ ಸಭೆಯ ಅಧ್ಯಕ್ಷತೆವಹಿಸಿ ಮಾತನಾಡಿದರು.
ಗ್ರಾಮೀಣ ಭಾಗದಲ್ಲಿರುವ ಗ್ರಾಮ ಠಾಣ ಹಾಗು ಖಾಲಿ ಇರುವ ಸರ್ಕಾರಿ ಭೂಮಿ ಕುರಿತು ನಿಖರ ಮಾಹಿತಿಯನ್ನು ಸಂಗ್ರಹಿಸುವ ಜೊತೆಗೆ ಒತ್ತುವರಿಯಾಗಿರುವುದು ಕಂಡು ಬಂದಲ್ಲಿ ಅಗತ್ಯ ಕ್ರಮ ಕೈಗೊಂಡು ತೆರವುಗೊಳಿಸಬೇಕೆಂದರು.
ನಿವೇಶನ ರಹಿತ ಅರ್ಹ ಫಲಾನುಭವಿಗಳನ್ನು ಮೀಸಲಾತಿ ಆಧಾರದಡಿ ಪಾರದರ್ಶಕವಾಗಿ ಆಯ್ಕೆ ಮಾಡಬೇಕು. ಯಾವುದೇ ಅಕ್ರಮಗಳಿಗೆ ಅವಕಾಶ ನೀಡಬಾರದು. ಅಲ್ಲದೆ ಸರ್ಕಾರದ ವಿವಿಧ ವಸತಿ ಯೋಜನೆಯಡಿ ಮನೆಗಳನ್ನು ನಿರ್ಮಿಸಿಕೊಳ್ಳಲು ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸುವಂತೆ ಗ್ರಾಮಸ್ಥರಿಗೆ ಸೂಕ್ತ ಮಾಹಿತಿ ನೀಡಬೇಕೆಂದರು.
ಇದೆ ರೀತಿ ನಗರಸಭೆ ವ್ಯಾಪ್ತಿಯಲ್ಲಿರುವ ಸರ್ಕಾರಿ ಖಾಲಿ ಭೂಮಿಗಳನ್ನು ಗುರುತಿಸಿ ವರದಿ ಸಲ್ಲಿಸುವಂತೆ ಸೂಚಿಸಿದರು.
ಸಭೆಯಲ್ಲಿ ತಾಲೂಕು ಪಂಚಾಯಿತಿ ಅಧ್ಯಕ್ಷೆ ಡಿ. ಲಕ್ಷ್ಮೀದೇವಿ, ಕಾರ್ಯನಿರ್ವಹಣಾಧಿಕಾರಿ ಡಾ. ಜಿ. ಮಂಜುನಾಥ್, ತಹಸೀಲ್ದಾರ್ ಎಚ್.ಸಿ ಶಿವಕುಮಾರ್, ಪೌರಾಯುಕ್ತ ಮನೋಹರ್, ಸಮಾಜ ಕಲ್ಯಾಣ ಇಲಾಖೆ ವ್ಯವಸ್ಥಾಪಕ ಎನ್. ಕೃಷ್ಣಪ್ಪ, ವಿಐಎಸ್‌ಎಲ್ ನಗರಾಡಳಿತಾಧಿಕಾರಿ ವಿಶ್ವನಾಥ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.
ಗ್ರಾ.ಪಂ. ಅಭಿವೃದ್ಧಿ ಅಧಿಕಾರಿಗಳು, ಕಂದಾಯ ಇಲಾಖೆ ಅಧಿಕಾರಿಗಳು, ನಗರಸಭೆ ಅಧಿಕಾರಿಗಳು ಸೇರಿದಂತೆ ಇನ್ನಿತರ ಇಲಾಖೆಗಳ ಅಧಿಕಾರಿಗಳು ಪಾಲ್ಗೊಂಡಿದ್ದರು.