ತಗ್ಗು ಪ್ರದೇಶಗಳಿಗೆ ನುಗ್ಗಿದ ನೀರು, ನಿವಾಸಿಗಳ ಸ್ಥಳಾಂತರ
ಭದ್ರಾವತಿ, ಸೆ. ೨೦: ಭದ್ರಾ ಜಲಾಶಯ ವ್ಯಾಪ್ತಿಯಲ್ಲಿ ನಿರಂತರವಾಗಿ ಮಳೆಯಾಗುತ್ತಿರುವ ಹಿನ್ನಲೆಯಲ್ಲಿ ಜಲಾಶಯಕ್ಕೆ ಹರಿದು ಬರುತ್ತಿರುವ ನೀರಿನ ಪ್ರಮಾಣದಲ್ಲಿ ಏರಿಕೆಯಾಗುತ್ತಿದ್ದು, ಈ ಹಿನ್ನಲೆಯಲ್ಲಿ ಹೆಚ್ಚಿನ ಪ್ರಮಾಣದ ನೀರನ್ನು ನದಿಗೆ ಹರಿದು ಬಿಡಲಾಗುತ್ತಿದೆ.
ಕಳೆದ ವಾರವೇ ಜಲಾಶಯ ಪೂರ್ಣಪ್ರಮಾಣದಲ್ಲಿ ಭರ್ತಿಯಾಗಿದ್ದು, ೪ ಕ್ರಸ್ಟ್ ಗೇಟ್‌ಗಳ ಮೂಲಕ ಸ್ವಲ್ಪ ಪ್ರಮಾಣದ ನೀರನ್ನು ನದಿಗೆ ಬಿಡಲಾಗುತ್ತಿತ್ತು. ಕಳೆದ ೨ ದಿನಗಳಿಂದ ಜಲಾಶಯ ವ್ಯಾಪ್ತಿಯ ಪ್ರದೇಶಗಳಲ್ಲಿ ಹೆಚ್ಚಿನ ಮಳೆಯಾಗುತ್ತಿರುವ ಹಿನ್ನಲೆಯಲ್ಲಿ ಶನಿವಾರ ರಾತ್ರಿಯಿಂದ ಹೆಚ್ಚುವರಿ ನೀರು ಬಿಡಲಾಗುತ್ತಿದೆ. ಮಧ್ಯಾಹ್ನದ ವೇಳೆಗೆ ಸುಮಾರು ೬೦ ಸಾವಿರ ಕ್ಯೂಸೆಕ್ಸ್ ನೀರು ನದಿಯಲ್ಲಿ ಹರಿದು ಬರುತ್ತಿದ್ದು, ಇದರಿಂದಾಗಿ ನಗರ ಪ್ರದೇಶದ ವ್ಯಾಪ್ತಿಯಲ್ಲಿ ತಗ್ಗು ಪ್ರದೇಶಗಳು ಜಲಾವೃತಗೊಂಡಿವೆ.
ಕವಲಗುಂದಿ ಗ್ರಾಮದ ಮನೆಗಳಿಗೆ ನೀರು:
ಪ್ರತಿ ಬಾರಿ ಜಲಾಶಯದಿಂದ ನದಿಗೆ ನೀರು ಬಿಟ್ಟ ಸಂದರ್ಭದಲ್ಲಿ ನಗರಸಭೆ ವ್ಯಾಪ್ತಿಯ ಕವಲಗುಂದಿ ಗ್ರಾಮದ ತಗ್ಗು ಪ್ರದೇಶದಲ್ಲಿರುವ ಮನೆಗಳಿಗೆ ನೀರು ನುಗ್ಗುತ್ತಿದ್ದು, ಈ ಬಾರಿ ಸಹ ನೀರು ಮನೆಗಳಿಗೆ ನುಗ್ಗಿದೆ. ಮುನ್ನಚ್ಚರಿಕೆ ಕ್ರಮವಾಗಿ ಜಿಲ್ಲಾಡಳಿತ, ತಾಲೂಕು ಆಡಳಿತ, ನಗರಸಭೆ ವತಿಯಿಂದ ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗಿದೆ. ತಗ್ಗು ಪ್ರದೇಶದ ನಿವಾಸಿಗಳನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸಲಾಗಿದೆ.
ಅಪ್ಪರ್ ಹುತ್ತಾದಲ್ಲಿರುವ ಕೆಂಪೇಗೌಡ ಸಮುದಾಯ ಭವನದಲ್ಲಿ ಗಂಜಿ ಕೇಂದ್ರ ತೆರೆಯಲಾಗಿದ್ದು, ನಿರಾಶ್ರಿತರಿಗೆ ಅಗತ್ಯ ಸೌಲಭ್ಯಗಳನ್ನು ಕಲ್ಪಿಸಲಾಗಿದೆ.
ಹೊಸ ಸೇತುವೆ ಮುಳುಗಡೆ:
ಪ್ರತಿ ಬಾರಿಯಂತೆ ಈ ಬಾರಿ ಸಹ ಕೆಎಸ್‌ಆರ್‌ಟಿಸಿ ಮುಖ್ಯ ಬಸ್ ನಿಲ್ದಾಣದ ಬಳಿ ಇರುವ ಹೊಸಸೇತುವೆ ಹಾಗೂ ಹಳೇಸೇತುವೆ ಬಳಿ ಇರುವ ಸಂಗಮೇಶ್ವರ ದೇವಸ್ಥಾನ ನೀರಿನಲ್ಲಿ ಸಂಪೂರ್ಣವಾಗಿ ಮುಳುಗಡೆಯಾಗಿದ್ದು, ಹೊಸಸೇತುವೆ ಮೇಲಿನ ಸಂಚಾರವನ್ನು ಬೆಳಿಗ್ಗೆಯಿಂದಲೇ ಸಂಪೂರ್ಣವಾಗಿ ನಿಷೇಧಿಸಲಾಗಿತ್ತು. ಸೇತುವೆ ಎರಡು ಕಡೆ ಬ್ಯಾರಿಗೇಡ್‌ಗಳನ್ನು ಅಳವಡಿಸಲಾಗಿದೆ. ಎಲ್ಲಾ ವಾಹನಗಳು ಹಳೇ ಸೇತುವೆ ಮೇಲೆ ಸಂಚರಿಸುತ್ತಿದ್ದು, ಇದರಿಂದಾಗಿ ವಾಹನ ದಟ್ಟಣೆ ಅಧಿಕವಾಗಿದೆ.
ಉಳಿದಂತೆ ಅಂಬೇಡ್ಕರ್ ಸರ್ಕಲ್ ಮತ್ತು ಗುಂಡೂರಾವ್ ಶೆಡ್ ಬಳಿ ಮನೆಗಳಿಗೆ ನೀರು ನುಗ್ಗಿದೆ. ಜಲಾವೃತಗೊಂಡ ಪ್ರದೇಶಗಳಿಗೆ ಉಪವಿಭಾಗಾಧಿಕಾರಿ ಟಿ.ವಿ ಪ್ರಕಾಶ್, ತಹಸೀಲ್ದಾರ್ ನಾಗರಾಜ್, ನಗರಸಭೆ ಪೌರಾಯುಕ್ತ ಮನೋಹ್ ಸೇರಿದಂತೆ ಇನ್ನಿತರ ಅಧಿಕಾರಿಗಳನ್ನೊಳಗೊಂಡ ತಂಡ ಭೇಟಿ ನೀಡಿ ಪರಿಶೀಲನೆ ನಡೆಸಿದೆ.
ಚಿತ್ರ: ಡಿ೨೦-ಬಿಡಿವಿಟ೩
ಭದ್ರಾ ಜಲಾಶಯದಿಂದ ಹೆಚ್ಚುವರಿ ನೀರು ನದಿಗೆ ಬಿಟ್ಟ ಹಿನ್ನಲೆಯಲ್ಲಿ ನಗರದ ಹೊಸಸೇತುವೆ ಭಾನುವಾರ ಸಂಪೂರ್ಣವಾಗಿ ಮುಳುಗಡೆಯಾಗಿರುವುದು.
ಚಿತ್ರ: ಡಿ೨೦-ಬಿಡಿವಿಟಿ೪
ಭದ್ರಾ ಜಲಾಶಯದಿಂದ ಹೆಚ್ಚುವರಿ ನೀರು ನದಿಗೆ ಬಿಟ್ಟ ಹಿನ್ನಲೆಯಲ್ಲಿ ತಗ್ಗು ಪ್ರದೇಶಗಳಿಗೆ ನೀರು ನುಗ್ಗಿದ್ದು, ಜಲಾವೃತಗೊಂಡ ಪ್ರದೇಶಗಳಿಗೆ ಉಪವಿಭಾಗಾಧಿಕಾರಿ ಟಿ.ವಿ ಪ್ರಕಾಶ್ ನೇತೃತ್ವದ ಅಧಿಕಾರಿಗಳ ತಂಡ ಭೇಟಿ ನೀಡಿ ಪರಿಶೀಲನೆ ನಡೆಸಿತು.