ಮಂಗಳವಾರ, ಸೆಪ್ಟೆಂಬರ್ 22, 2020

ಕಾಮಕೇಳಿ ತಹಸೀಲ್ದಾರ್ ತಕ್ಷಣ ಸೇವೆಯಿಂದ ಅಮಾನತುಗೊಳಿಸಿ

ತಾಲೂಕು ಕಛೇರಿ ಮುಂಭಾಗ ಪ್ರತಿಭಟನಾ ಧರಣಿ : ಆಗ್ರಹ


ಪರಿಶಿಷ್ಟ ಜಾತಿ ಮಹಿಳೆಯನ್ನು ಲೌಂಗಿಕವಾಗಿ ಶೋಷಣೆ ಮಾಡಿರುವ ತಹಸೀಲ್ದಾರ್ ಎಚ್.ಸಿ ಶಿವಕುಮಾರ್‌ರವರನ್ನು ತಕ್ಷಣ ಸೇವೆಯಿಂದ ಅಮಾನತುಗೊಳಿಸಬೇಕೆಂದು ಆಗ್ರಹಿಸಿ ಸೋಮವಾರ ಭದ್ರಾವತಿ ತಾಲೂಕು ಕಛೇರಿ ಮುಂಭಾಗ ಪ್ರತಿಭಟನಾ ಧರಣಿ ನಡೆಸಲಾಯಿತು.
ಭದ್ರಾವತಿ: ಪರಿಶಿಷ್ಟ ಜಾತಿ ಮಹಿಳೆಯನ್ನು ಲೌಂಗಿಕವಾಗಿ ಶೋಷಣೆ ಮಾಡಿರುವ ತಹಸೀಲ್ದಾರ್ ಎಚ್.ಸಿ ಶಿವಕುಮಾರ್‌ರವರನ್ನು ತಕ್ಷಣ ಸೇವೆಯಿಂದ ಅಮಾನತುಗೊಳಿಸಬೇಕೆಂದು ಆಗ್ರಹಿಸಿ ಸೋಮವಾರ ತಾಲೂಕು ಕಛೇರಿ ಮುಂಭಾಗ ಪ್ರತಿಭಟನಾ ಧರಣಿ ನಡೆಸಲಾಯಿತು.
      ದಲಿತ ಸಂಘರ್ಷ ಸಮಿತಿ(ಅಂಬೇಡ್ಕರ್ ವಾದ), ಎಂ.ಜೆ ಅಪ್ಪಾಜಿ ಅಭಿಮಾನಿಗಳ ಬಳಗ, ಪ್ರಗತಿಪರ ಸಂಘಟನೆಗಳು, ವಿವಿಧ ಸಮಾಜಗಳು, ಮಹಿಳಾ ಸಂಘಟನೆಗಳು, ರಾಜಕೀಯ ಪಕ್ಷಗಳ ಮುಖಂಡರ ನೇತೃತ್ವದಲ್ಲಿ ನಡೆದ ಪ್ರತಿಭಟನಾ ಧರಣಿಯಲ್ಲಿ ತಹಸೀಲ್ದಾರ್ ಶಿವಕುಮಾರ್‌ರವರು ಮಾಡಿರುವ ತಪ್ಪಿಗೆ ಶಿಕ್ಷೆಯಾಗಲೇ ಬೇಕು. ಕೇವಲ ಕರ್ತವ್ಯದಿಂದ ಬಿಡುಗಡೆಗೊಳಿಸಿದರೆ ಸಾಲದು ಅವರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು. ಸೇವೆಯಿಂದ ಅಮಾನತುಗೊಳಿಸಬೇಕು. ತಕ್ಷಣ ಅವರನ್ನು ಬಂಧಿಸಬೇಕೆಂದು ಆಗ್ರಹಿಸಲಾಯಿತು.
     ಟಿ.ಎಚ್ ಹಾಲೇಶಪ್ಪ, ಆರ್ ಕರುಣಾಮೂರ್ತಿ, ಎಚ್. ರವಿಕುಮಾರ್, ಬದರಿನಾರಾಯಣ್, ಎಸ್. ಮಂಜುನಾಥ್, ಕೆ. ಮಂಜುನಾಥ್, ಇಬ್ರಾಹಿಂ ಖಾನ್, ಬಸವರಾಜ ಆನೇಕೊಪ್ಪ, ಎಂ. ಕುಬೇಂದ್ರಪ್ಪ, ಉಮೇಶ್, ಎಂ. ಪಳನಿರಾಜ್ ಸೇರಿದಂತೆ ಇನ್ನಿತರರು ಪಾಲ್ಗೊಂಡಿದ್ದರು.

ಸೋಮವಾರ, ಸೆಪ್ಟೆಂಬರ್ 21, 2020

ಶಾಸಕ ಬಿ.ಕೆ ಸಂಗಮೇಶ್ವರ್ ಶೀಘ್ರ ಗುಣಮುಖರಾಗಲು ವಿಶೇಷ ಪೂಜೆ, ಪ್ರಾರ್ಥನೆ

ಶಾಸಕ ಬಿ.ಕೆ ಸಂಗಮೇಶ್ವರ್ ಶೀಘ್ರ ಗುಣಮುಖರಾಗಲಿ ಎಂದು ಪ್ರಾರ್ಥಿಸಿ ಭದ್ರಾವತಿ ಹಳೇನಗರದ ವೀರಭದ್ರೇಶ್ವರ ಸ್ವಾಮಿ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಲಾಯಿತು.
     ಭದ್ರಾವತಿ, ಸೆ. ೨೧: ಶಾಸಕ ಬಿ.ಕೆ ಸಂಗಮೇಶ್ವರ್‌ಗೆ ಕೊರೋನಾ ಸೋಂಕಿನ ಶೀಘ್ರವಾಗಿ ಗುಣಮುಖರಾಗಲಿ ಎಂದು ಪ್ರಾರ್ಥಿಸಿ ದೇವಸ್ಥಾನ, ದರ್ಗಾದಲ್ಲಿ ವಿಶೇಷ ಪೂಜೆ ಸೋಮವಾರ ಸಂಜೆ ನೆರವೇರಿಸಲಾಯಿತು.
      ಕೊರೋನಾ ಸೋಂಕು ದೃಢಪಟ್ಟ ಹಿನ್ನಲೆಯಲ್ಲಿ ಯಾವುದೇ ರೋಗ ಲಕ್ಷಣಗಳಿಲ್ಲದಿದ್ದರೂ ಸಹ ಭಾನುವಾರ ಸಂಜೆ ಶಾಸಕ ಬಿ.ಕೆ ಸಂಗಮೇಶ್ವರ್ ಶಿವಮೊಗ್ಗ ಖಾಸಗಿ ಆಸ್ಪತ್ರೆಗೆ ದಾಖಲಾಗಿ ನಂತರ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್‌ರವರ ಸಲಹೆ ಮೇರೆಗೆ ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ ತೆರಳಿದ್ದು, ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ. ಈ ನಡುವೆ ನಗರದಲ್ಲಿ ಕಾಂಗ್ರೆಸ್ ಪಕ್ಷದ ಸ್ಥಳೀಯ ಮುಖಂಡರು, ಕಾರ್ಯಕರ್ತರು, ಅಭಿಮಾನಿಗಳು ದೇವರ ಪ್ರಾರ್ಥನೆಗೆ ಮೊರೆ ಹೋಗಿದ್ದಾರೆ.
     ಪಕ್ಷದ ನಗರ ಘಟಕದ ಅಧ್ಯಕ್ಷ ಟಿ. ಚಂದ್ರೇಗೌಡ, ಗ್ರಾಮಾಂತರ ಘಟಕದ ಅಧ್ಯಕ್ಷ ಎಚ್.ಎಲ್ ಷಡಾಕ್ಷರಿ ನೇತೃತ್ವದಲ್ಲಿ ಹಳೇನಗರದ ವೀರಭದ್ರೇಶ್ವರ ಸ್ವಾಮಿ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಲಾಯಿತು.
    ಕೆಪಿಸಿಸಿ ಎಸ್.ಸಿ ಘಟಕದ ಸಂಚಾಲಕ ರಾಘವೇಂದ್ರ, ಮಹಿಳಾ ಘಟಕದ ಅಧ್ಯಕ್ಷೆ ಮಂಜುಳ ರಾಮಚಂದ್ರ, ರೇಣುಕಮ್ಮ, ಲೋಕೇಶ್, ಎಂ. ಶಿವಕುಮಾರ್, ಶೇಷಗಿರಿ, ರೂಪಾ ನಾರಾಯಣ, ಅಣ್ಣೋಜಿರಾವ್, ಶ್ರೀಧರ್, ಗೋಪಿ, ರಾಮಕೃಷ್ಣೇಗೌಡ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.


ಶಾಸಕ ಬಿ.ಕೆ ಸಂಗಮೇಶ್ವರ್ ಶೀಘ್ರ ಗುಣಮುಖರಾಗಲಿ ಎಂದು ಪ್ರಾರ್ಥಿಸಿ ಭದ್ರಾವತಿ ತರೀಕೆರೆ ರಸ್ತೆಯಲ್ಲಿರುವ ಸೈಯದ್ ಸಾದತ್ ದರ್ಗಾದಲ್ಲಿ ಪ್ರಾರ್ಥನೆ ಸಲ್ಲಿಸಲಾಯಿತು.
     ಸೈಯದ್ ಸಾದತ್ ದರ್ಗಾದಲ್ಲಿ ಪ್ರಾರ್ಥನೆ:
    ನಗರದ ತರೀಕೆರೆ ರಸ್ತೆಯಲ್ಲಿರುವ ಸೈಯದ್ ಸಾದತ್ ದರ್ಗಾದಲ್ಲಿ ಶಾಸಕ ಬಿ.ಕೆ ಸಂಗಮೇಶ್ವರ್ ಶೀಘ್ರ ಗುಣಮುಖರಾಗಲಿ ಎಂದು ಮೌಲ್ವಿ ಆಸೀಪುಲ್ಲ ನೇತೃತ್ವದಲ್ಲಿ ಪ್ರಾರ್ಥಿಸಲಾಯಿತು.
      ಮುಖಂಡರಾದ ಜೆಬಿಟಿ ಬಾಬು, ಟಿಪ್ಪು ಸುಲ್ತಾನ್, ಸಮೀವುಲ್ಲಾ, ಅಬ್ದುಲ್ ಖಾದರ್, ಜಾವಿದ್, ಮುಸ್ವೀರ್ ಬಾಷಾ, ಎನ್‌ಎಕೆ ಇಮ್ರಾನ್ ಖಾನ್, ಬಷೀರ್ ಅಹಮದ್, ಇಮ್ರಾನ್ ಜುಲೆಬಿ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.





ಭಾನುವಾರ, ಸೆಪ್ಟೆಂಬರ್ 20, 2020

ಶಾಸಕ ಬಿ.ಕೆ ಸಂಗಮೇಶ್ವರ್‌ಗೆ ಕೊರೋನಾ ಸೋಂಕು : ಶಿವಮೊಗ್ಗ ಖಾಸಗಿ ಆಸ್ಪತ್ರೆಗೆ ದಾಖಲು

ಬಿ.ಕೆ ಸಂಗಮೇಶ್ವರ್
ಭದ್ರಾವತಿ, ಸೆ. ೨೦: ಶಾಸಕ ಬಿ.ಕೆ ಸಂಗಮೇಶ್ವರ್‌ಗೂ ಕೊರೋನಾ ಸೋಂಕು ತಗುಲಿದ್ದು, ಭಾನುವಾರ ಸಂಜೆ ದಿಢೀರನೆ ಶಿವಮೊಗ್ಗ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ.
     ಕಳೆದ ೨ ದಿನಗಳ ಹಿಂದೆ ಮನೆಯಲ್ಲಿ ಕೆಲಸ ಮಾಡುವ ೪ ಮಂದಿ ಕೆಲಸಗಾರರಲ್ಲಿ ಕೊರೋನಾ ಇರುವುದು ದೃಢಪಟ್ಟಿತ್ತು. ಈ ಹಿನ್ನಲೆಯಲ್ಲಿ ಸಂಗಮೇಶ್ವರ್ ಮತ್ತು ಸಹೋದರ್ ಬಿ.ಕೆ ಮೋಹನ್ ನಿವಾಸಗಳನ್ನು ಸೀಲ್‌ಡೌನ್ ಮಾಡಲಾಗಿತ್ತು.
     ಈ ನಡುವೆ ಕೊರೋನಾ ತಪಾಸಣೆ ವರದಿಯಲ್ಲಿ ಸಂಗಮೇಶ್ವರ್‌ಗೆ ಸೋಂಕು ಇರುವುದು ಪತ್ತೆಯಾಗಿದೆ. ಈ ಹಿನ್ನಲೆಯಲ್ಲಿ ಶಿವಮೊಗ್ಗ ನಾರಾಯಣ ಹೃದಯಾಲಯ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲಾಗಿದ್ದಾರೆ ಎನ್ನಲಾಗಿದೆ.

ಕಾಮಕೇಳಿ ತಹಸೀಲ್ದಾರ್ ಅಮಾನತ್ತಿಗೆ ಆಗ್ರಹಿಸಿ ಸೆ.೨೧ರಂದು ಪ್ರತಿಭಟನಾ ಧರಣಿ

ಭದ್ರಾವತಿ ನ್ಯೂಟೌನ್ ಗಾಂಧಿ ಉದ್ಯಾನವನದಲ್ಲಿ ಭಾನುವಾರ  ದಲಿತ ಸಂಘರ್ಷ ಸಮಿತಿ(ಅಂಬೇಡ್ಕರ್ ವಾದ), ಎಂ.ಜೆ ಅಪ್ಪಾಜಿ ಅಭಿಮಾನಿಗಳ ಬಳಗ, ಪ್ರಗತಿಪರ ಸಂಘಟನೆಗಳು, ವಿವಿಧ ಸಮಾಜಗಳು, ಮಹಿಳಾ ಸಂಘಟನೆಗಳು, ರಾಜಕೀಯ ಪಕ್ಷಗಳ ಮುಖಂಡರು ಪೂರ್ವಭಾವಿ ಸಭೆ ನಡೆಸಿದರು.
ಭದ್ರಾವತಿ, ಸೆ. ೨೦: ಪರಿಶಿಷ್ಟ ಜಾತಿ ಮಹಿಳೆಯನ್ನು ಲೌಂಗಿಕವಾಗಿ ಶೋಷಣೆ ಮಾಡಿರುವ ತಹಸೀಲ್ದಾರ್ ಎಚ್.ಸಿ ಶಿವಕುಮಾರ್‌ರವರನ್ನು ತಕ್ಷಣ ಸೇವೆಯಿಂದ ಅಮಾನತ್ತುಗೊಳಿಸಬೇಕೆಂದು ಆಗ್ರಹಿಸಿ ಸೋಮವಾರ ಬೆಳಿಗ್ಗೆ ತಾಲೂಕು ಕಛೇರಿ ಮುಂಭಾಗ ಪ್ರತಿಭಟನಾ ಧರಣಿ ಹಮ್ಮಿಕೊಳ್ಳಲಾಗಿದೆ.
     ಈ ಸಂಬಂಧ ನ್ಯೂಟೌನ್ ಗಾಂಧಿ ಉದ್ಯಾನವನದಲ್ಲಿ ಭಾನುವಾರ ಪೂರ್ವಭಾವಿ ಸಭೆ ನಡೆಸಿದ ದಲಿತ ಸಂಘರ್ಷ ಸಮಿತಿ(ಅಂಬೇಡ್ಕರ್ ವಾದ), ಎಂ.ಜೆ ಅಪ್ಪಾಜಿ ಅಭಿಮಾನಿಗಳ ಬಳಗ, ಪ್ರಗತಿಪರ ಸಂಘಟನೆಗಳು, ವಿವಿಧ ಸಮಾಜಗಳು, ಮಹಿಳಾ ಸಂಘಟನೆಗಳು, ರಾಜಕೀಯ ಪಕ್ಷಗಳ ಮುಖಂಡರು ಬೆಳಿಗ್ಗೆ ೧೧ ಗಂಟೆಗೆ ಪ್ರತಿಭಟನಾ ಧರಣಿ ನಡೆಸಲು ತೀರ್ಮಾನ ಕೈಗೊಂಡಿದ್ದಾರೆ. ಸಾರ್ವಜನಿಕರು ಸಂಖ್ಯೆಯಲ್ಲಿ ಪಾಲ್ಗೊಂಡು ಯಶಸ್ವಿಗೊಳಿಸುವಂತೆ ಕೋರಿದ್ದಾರೆ.
      ಸಭೆಯಲ್ಲಿ ಪ್ರಮುಖರಾದ ಟಿ.ಎಚ್ ಹಾಲೇಶಪ್ಪ, ಎಸ್. ಮಣಿಶೇಖರ್, ಎಚ್. ರವಿಕುಮಾರ್, ಬದರಿನಾರಾಯಣ್, ಎಸ್. ಮಂಜುನಾಥ್, ಕೆ. ಮಂಜುನಾಥ್, ಇಬ್ರಾಹಿಂ ಖಾನ್ ಸೇರಿದಂತೆ ಇನ್ನಿತರರು ಪಾಲ್ಗೊಂಡಿದ್ದರು.

ಹೋರಾಟದ ಮೂಲಕ ಕೈಗಾರಿಕಾ ನಗರದ ಸರ್ವತೋಮುಖ ಅಭಿವೃದ್ಧಿಗೆ ಬದ್ಧ : ಎಚ್.ಸಿ ರಮೇಶ್

ಭದ್ರಾವತಿ ನ್ಯೂಟೌನ್ ಲಯನ್ಸ್ ಕ್ಲಬ್ ಸಭಾಂಗಣದಲ್ಲಿ ನಮೋ ಗ್ರೂಪ್ ಮತ್ತು ಬಿಜೆಪಿ ಕಾರ್ಯಕರ್ತರಿಂದ ಹಮ್ಮಿಕೊಳ್ಳಲಾಗಿದ್ದ ಅಭಿನಂದನ ಸಮಾರಂಭವನ್ನು ಕೇಂದ್ರ ಸರ್ಕಾರದ ಮೈಕ್ರೋ ಸ್ಮಾಲ್ ಮೀಡಿಯಂ ಎಂಟರ್ ಪ್ರೈಸಸ್(ಎಂ.ಎಸ್.ಎಂ.ಇ) ಸಂಸ್ಥೆಯ ನೂತನ ನಿರ್ದೇಶಕ,  ಉದ್ಯಮಿ ಎಚ್.ಸಿ ರಮೇಶ್ ಉದ್ಘಾಟಿಸಿದರು.
ಭದ್ರಾವತಿ, ಸೆ.೨೦ :  ಕೈಗಾರಿಕಾ ನಗರದ ಸರ್ವತೋಮುಖ ಅಭಿವೃದ್ಧಿಗಾಗಿ ಹೋರಾಟ ನಡೆಸುವುದಾಗಿ ಕೇಂದ್ರ ಸರ್ಕಾರದ ಮೈಕ್ರೋ ಸ್ಮಾಲ್ ಮೀಡಿಯಂ ಎಂಟರ್ ಪ್ರೈಸಸ್(ಎಂ.ಎಸ್.ಎಂ.ಇ) ಸಂಸ್ಥೆಯ ನೂತನ ನಿರ್ದೇಶಕ,  ಉದ್ಯಮಿ ಎಚ್.ಸಿ ರಮೇಶ್ ಭರವಸೆ ವ್ಯಕ್ತಪಡಿಸಿದರು.
        ಎಂಎಸ್‌ಎಂಇ ಸಂಸ್ಥೆಗೆ ನೇಮಕಗೊಂಡ ನಂತರ ಅವರು ಮೊದಲ ಬಾರಿಗೆ  ಭಾನುವಾರ  ನಗರಕ್ಕೆ ಆಗಮಿಸಿದ ಹಿನ್ನೆಲೆಯಲ್ಲಿ ನ್ಯೂಟೌನ್ ಲಯನ್ಸ್ ಕ್ಲಬ್ ಸಭಾಂಗಣದಲ್ಲಿ ನಮೋ ಗ್ರೂಪ್ ಮತ್ತು ಬಿಜೆಪಿ ಕಾರ್ಯಕರ್ತರ ಅಭಿನಂದನ ಸಮಾರಂಭದಲ್ಲಿ ಪಾಲ್ಗೊಂಡು ಮಾತನಾಡಿದರು.
       ವಿಐಎಸ್‌ಎಲ್ ಕಾರ್ಖಾನೆಯ ಕಾರ್ಮಿಕನ ಮಗನಾಗಿ ಹುಟ್ಟಿರುವ ನಾನು ಈ ನಗರದ ಋಣ ತೀರಿಸುವುದು ನನ್ನ ಜವಾಬ್ದಾರಿಯಾಗಿದೆ. ಪಕ್ಷದ ಕೇಂದ್ರ ಹಾಗೂ ರಾಜ್ಯದ ನಾಯಕರು ಬಹಳ ಪ್ರಮುಖವಾದ ಜವಬ್ದಾರಿಯನ್ನು ನೀಡಿದ್ದಾರೆ.  ನನಗೆ ವಹಿಸಿಕೊಟ್ಟಿರುವ ಜವಬ್ದಾರಿಗೆ ಸದಾ ಚಿರಋಣಿಯಾಗಿದ್ದು, ಕ್ಷೇತ್ರದಲ್ಲಿ ಸಾಮಾನ್ಯ ಜನರ ಸಂಕಷ್ಟಗಳನ್ನು ಅರಿತು ಅವರ ಪರವಾಗಿ ಹೋರಾಟ ನಡೆಸಲು ಸಿದ್ದವಾಗಿದ್ದೇನೆ. ಮುಂದಿನ ದಿನಗಳಲ್ಲಿ ಯಾವುದೇ ರೀತಿಯ ಸಮಸ್ಯೆಗಳಿದ್ದರೂ ಸಹ ಸ್ಪಂದಿಸುವುದಾಗಿ ಭರವಸೆ ನೀಡಿದರು.
       ಎಂಪಿಎಂ ಮತ್ತು ವಿಐಎಸ್‌ಎಲ್ ಎರಡು ಕಾರ್ಖಾನೆಗಳ ಸಮಸ್ಯೆಗಳನ್ನು ರಾಜ್ಯ ಮತ್ತು ಕೇಂದ್ರ ನಾಯಕರುಗಳ ಬಳಿ ಕೊಂಡೊಯ್ದು ವಾಸ್ತವ ಸ್ಥಿತಿಗತಿಗಳನ್ನು ಮನವರಿಕೆ ಮಾಡಿಕೊಡುವ ಮೂಲಕ ಗಮನ ಸೆಳೆಯಲು ಪ್ರಾಮಾಣಿಕವಾಗಿ ಪ್ರಯತ್ನಿಸುತ್ತೇನೆ. ಕ್ಷೇತ್ರದ ಸಮಸ್ತ ನಾಗರೀಕರು, ಪಕ್ಷದ ಸ್ಥಳೀಯ ಮುಖಂಡರು, ಕಾರ್ಯಕರ್ತರು ಮುಂದಿನ ದಿನಗಳಲ್ಲಿ ಹೆಚ್ಚಿನ ಸಹಕಾರ ನೀಡಬೇಕೆಂದು ಮನವಿ ಮಾಡಿದರು.    


ಭಾರತರತ್ನ ಸರ್.ಎಂ ವಿಶ್ವೇಶ್ವರಯ್ಯ ಚಾರಿಟಬಲ್ ಟ್ರಸ್ಟ್, ಶ್ರೀ ಡಿ. ದೇವರಾಜ ಅರಸು ಜನಸ್ಪಂದನ ವೇದಿಕೆ ಮತ್ತು ಸುವರ್ಣ ಮಹಿಳಾ ವೇದಿಕೆ ವತಿಯಿಂದ ಕೇಂದ್ರ ಸರ್ಕಾರದ ಮೈಕ್ರೋ ಸ್ಮಾಲ್ ಮೀಡಿಯಂ ಎಂಟರ್ ಪ್ರೈಸಸ್(ಎಂ.ಎಸ್.ಎಂ.ಇ) ಸಂಸ್ಥೆಯ ನೂತನ ನಿರ್ದೇಶಕ,  ಉದ್ಯಮಿ ಎಚ್.ಸಿ ರಮೇಶ್‌ರವರನ್ನು ಸನ್ಮಾನಿಸಿ ಅಭಿನಂದಿಸಲಾಯಿತು.

    ನಗರಸಭೆ ಹಿರಿಯ ಸದಸ್ಯ ಕೆ.ಎನ್ ಭೈರಪ್ಪಗೌಡ, ಕಟ್ಟಡ ಕಾರ್ಮಿಕರ ಸಂಘದ ಜಿಲ್ಲಾ ಕಾರ್ಯದರ್ಶಿ ಸುಂದರ್ ಬಾಬು ಮಾತನಾಡಿದರು. ಇದಕ್ಕೂ ಮೊದಲು ನಗರಕ್ಕೆ ಆಗಮಿಸಿದ ಎಚ್.ಸಿ ರಮೇಶ್‌ರವರನ್ನು ನಮೋ ಗ್ರೂಪ್ ಮತ್ತು ಬಿಜೆಪಿ ಕಾರ್ಯಕರ್ತರು ಅದ್ದೂರಿಯಾಗಿ ಸ್ವಾಗತಿಸಿ ನಗರದ ಪ್ರಮುಖ ರಸ್ತೆಗಳಲ್ಲಿ ಮೆರವಣಿಗೆ ನಡೆಸಿದರು.
        ಭಾರತರತ್ನ ಸರ್.ಎಂ ವಿಶ್ವೇಶ್ವರಯ್ಯ ಚಾರಿಟಬಲ್ ಟ್ರಸ್ಟ್, ಶ್ರೀ ಡಿ. ದೇವರಾಜ ಅರಸು ಜನಸ್ಪಂದನ ವೇದಿಕೆ ಮತ್ತು ಸುವರ್ಣ ಮಹಿಳಾ ವೇದಿಕೆ ವತಿಯಿಂದ ರಮೇಶ್‌ರವನ್ನು ಸನ್ಮಾನಿಸಿ ಅಭಿನಂದಿಸಲಾಯಿತು.
     ಟ್ರಸ್ಟ್ ಛೇರ‍್ಮನ್ ಆರ್. ವೇಣುಗೋಪಾಲ್, ಪ್ರಮುಖರಾದ ಅಂತೋಣಿ ಗ್ಸೇವಿಯರ್, ಭವಾನಿ ಶಂಕರ್, ಆರ್. ಮುಕುಂದಪ್ಪ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

ಮುಖ್ಯೋಪಾಧ್ಯಾಯ ಬಸವಕುಮಾರ್ ನಿಧನ

ಬಸವಕುಮಾರ್
ಭದ್ರಾವತಿ: ತಾಲೂಕಿನ ಗೋಣಿಬೀಡು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯೋಪಾಧ್ಯಾಯ ಬಸವಕುಮಾರ್(೫೫) ಭಾನುವಾರ ನಿಧನ ಹೊಂದಿದರು.
       ಪತ್ನಿ, ಓರ್ವ ಪುತ್ರ, ಓರ್ವ ಪುತ್ರಿಯನ್ನು ಹೊಂದಿದ್ದರು. ಹೊಸಮನೆ ಶ್ರೀ ಮಲ್ಲಿಕಾರ್ಜುನ ಸ್ವಾಮಿ ದೇವಸ್ಥಾನದ ಬಳಿ ವಾಸಿಸುತ್ತಿದ್ದರು. ಕಳೆದ ಕೆಲವು ದಿನಗಳಿಂದ ಅನಾರೋಗ್ಯಕ್ಕೆ ಒಳಗಾಗಿ ಚಿಕಿತ್ಸೆ ಪಡೆದುಕೊಂಡಿದ್ದರು. ಏಕಾಏಕಿ ಪುನಃ ಅಸ್ವಸ್ಥಗೊಂಡು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.
ಬಂಗಾರಪ್ಪನವರು ಮುಖ್ಯಮಂತ್ರಿಯಾಗಿದ್ದ ಅವಧಿಯಲ್ಲಿ ಶಿಕ್ಷಕರಾಗಿ ನೇಮಕಗೊಂಡಿದ್ದರು. ಕಳೆದ ಕೆಲವು ವರ್ಷಗಳಿಂದ ಗೋಣಿಬೀಡು ಸರ್ಕಾರಿ ಶಾಲೆಯಲ್ಲಿ ಮುಖ್ಯೋಪಾಧ್ಯಾಯರಾಗಿ ಸೇವೆ ಸಲ್ಲಿಸುತ್ತಿದ್ದರು.
      ಸರ್ಕಾರಿ ನೌಕರರ ಬಳಕೆದಾರರ ಸಹಕಾರ ಸಂಘದ ಅಧ್ಯಕ್ಷರಾಗಿ, ದಲಿತ ಸಂಘರ್ಷ ಸಮಿತಿ ಖಜಾಂಚಿಯಾಗಿ ಸೇವೆ ಸಲ್ಲಿಸಿದ್ದರು. ಅಲ್ಲದೆ ತಾಲೂಕು ಕನ್ನಡ ಸಾಹಿತ್ಯ ಪರಿಷತ್ ಸೇರಿದಂತೆ ವಿವಿಧ ಸಂಘಟನೆ ಸಕ್ರಿಯವಾಗಿ ತೊಡಗಿಸಿಕೊಂಡಿದ್ದರು. ಮೃತರ ನಿಧನಕ್ಕೆ ಶಾಲೆಯ ಶಿಕ್ಷಕರು, ಎಸ್‌ಡಿಎಂಸಿ ಅಧ್ಯಕ್ಷರು, ಸದಸ್ಯರು, ಗ್ರಾಮಸ್ಥರು, ಸರ್ಕಾರಿ ನೌಕರರು ಸೇರಿದಂತೆ ತಾಲೂಕಿನ ವಿವಿಧ ಸಂಘ-ಸಂಸ್ಥೆಗಳು ಸಂತಾಪ ಸೂಚಿಸಿವೆ.

ಭದ್ರಾ ನದಿಗೆ ಜಲಾಶಯದಿಂದ ಹೆಚ್ಚುವರಿ ನೀರು : ಹೊಸ ಸೇತುವೆ ಮುಳುಗಡೆ

ತಗ್ಗು ಪ್ರದೇಶಗಳಿಗೆ ನುಗ್ಗಿದ ನೀರು, ನಿವಾಸಿಗಳ ಸ್ಥಳಾಂತರ
ಭದ್ರಾವತಿ, ಸೆ. ೨೦: ಭದ್ರಾ ಜಲಾಶಯ ವ್ಯಾಪ್ತಿಯಲ್ಲಿ ನಿರಂತರವಾಗಿ ಮಳೆಯಾಗುತ್ತಿರುವ ಹಿನ್ನಲೆಯಲ್ಲಿ ಜಲಾಶಯಕ್ಕೆ ಹರಿದು ಬರುತ್ತಿರುವ ನೀರಿನ ಪ್ರಮಾಣದಲ್ಲಿ ಏರಿಕೆಯಾಗುತ್ತಿದ್ದು, ಈ ಹಿನ್ನಲೆಯಲ್ಲಿ ಹೆಚ್ಚಿನ ಪ್ರಮಾಣದ ನೀರನ್ನು ನದಿಗೆ ಹರಿದು ಬಿಡಲಾಗುತ್ತಿದೆ.
ಕಳೆದ ವಾರವೇ ಜಲಾಶಯ ಪೂರ್ಣಪ್ರಮಾಣದಲ್ಲಿ ಭರ್ತಿಯಾಗಿದ್ದು, ೪ ಕ್ರಸ್ಟ್ ಗೇಟ್‌ಗಳ ಮೂಲಕ ಸ್ವಲ್ಪ ಪ್ರಮಾಣದ ನೀರನ್ನು ನದಿಗೆ ಬಿಡಲಾಗುತ್ತಿತ್ತು. ಕಳೆದ ೨ ದಿನಗಳಿಂದ ಜಲಾಶಯ ವ್ಯಾಪ್ತಿಯ ಪ್ರದೇಶಗಳಲ್ಲಿ ಹೆಚ್ಚಿನ ಮಳೆಯಾಗುತ್ತಿರುವ ಹಿನ್ನಲೆಯಲ್ಲಿ ಶನಿವಾರ ರಾತ್ರಿಯಿಂದ ಹೆಚ್ಚುವರಿ ನೀರು ಬಿಡಲಾಗುತ್ತಿದೆ. ಮಧ್ಯಾಹ್ನದ ವೇಳೆಗೆ ಸುಮಾರು ೬೦ ಸಾವಿರ ಕ್ಯೂಸೆಕ್ಸ್ ನೀರು ನದಿಯಲ್ಲಿ ಹರಿದು ಬರುತ್ತಿದ್ದು, ಇದರಿಂದಾಗಿ ನಗರ ಪ್ರದೇಶದ ವ್ಯಾಪ್ತಿಯಲ್ಲಿ ತಗ್ಗು ಪ್ರದೇಶಗಳು ಜಲಾವೃತಗೊಂಡಿವೆ.
ಕವಲಗುಂದಿ ಗ್ರಾಮದ ಮನೆಗಳಿಗೆ ನೀರು:
ಪ್ರತಿ ಬಾರಿ ಜಲಾಶಯದಿಂದ ನದಿಗೆ ನೀರು ಬಿಟ್ಟ ಸಂದರ್ಭದಲ್ಲಿ ನಗರಸಭೆ ವ್ಯಾಪ್ತಿಯ ಕವಲಗುಂದಿ ಗ್ರಾಮದ ತಗ್ಗು ಪ್ರದೇಶದಲ್ಲಿರುವ ಮನೆಗಳಿಗೆ ನೀರು ನುಗ್ಗುತ್ತಿದ್ದು, ಈ ಬಾರಿ ಸಹ ನೀರು ಮನೆಗಳಿಗೆ ನುಗ್ಗಿದೆ. ಮುನ್ನಚ್ಚರಿಕೆ ಕ್ರಮವಾಗಿ ಜಿಲ್ಲಾಡಳಿತ, ತಾಲೂಕು ಆಡಳಿತ, ನಗರಸಭೆ ವತಿಯಿಂದ ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗಿದೆ. ತಗ್ಗು ಪ್ರದೇಶದ ನಿವಾಸಿಗಳನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸಲಾಗಿದೆ.
ಅಪ್ಪರ್ ಹುತ್ತಾದಲ್ಲಿರುವ ಕೆಂಪೇಗೌಡ ಸಮುದಾಯ ಭವನದಲ್ಲಿ ಗಂಜಿ ಕೇಂದ್ರ ತೆರೆಯಲಾಗಿದ್ದು,  ನಿರಾಶ್ರಿತರಿಗೆ ಅಗತ್ಯ ಸೌಲಭ್ಯಗಳನ್ನು ಕಲ್ಪಿಸಲಾಗಿದೆ.
ಹೊಸ ಸೇತುವೆ ಮುಳುಗಡೆ:
ಪ್ರತಿ ಬಾರಿಯಂತೆ ಈ ಬಾರಿ ಸಹ ಕೆಎಸ್‌ಆರ್‌ಟಿಸಿ ಮುಖ್ಯ ಬಸ್ ನಿಲ್ದಾಣದ ಬಳಿ ಇರುವ ಹೊಸಸೇತುವೆ ಹಾಗೂ ಹಳೇಸೇತುವೆ ಬಳಿ ಇರುವ ಸಂಗಮೇಶ್ವರ ದೇವಸ್ಥಾನ ನೀರಿನಲ್ಲಿ ಸಂಪೂರ್ಣವಾಗಿ ಮುಳುಗಡೆಯಾಗಿದ್ದು, ಹೊಸಸೇತುವೆ ಮೇಲಿನ ಸಂಚಾರವನ್ನು ಬೆಳಿಗ್ಗೆಯಿಂದಲೇ ಸಂಪೂರ್ಣವಾಗಿ ನಿಷೇಧಿಸಲಾಗಿತ್ತು. ಸೇತುವೆ ಎರಡು ಕಡೆ ಬ್ಯಾರಿಗೇಡ್‌ಗಳನ್ನು ಅಳವಡಿಸಲಾಗಿದೆ. ಎಲ್ಲಾ ವಾಹನಗಳು ಹಳೇ ಸೇತುವೆ ಮೇಲೆ ಸಂಚರಿಸುತ್ತಿದ್ದು, ಇದರಿಂದಾಗಿ ವಾಹನ ದಟ್ಟಣೆ ಅಧಿಕವಾಗಿದೆ.  
ಉಳಿದಂತೆ ಅಂಬೇಡ್ಕರ್ ಸರ್ಕಲ್ ಮತ್ತು ಗುಂಡೂರಾವ್ ಶೆಡ್ ಬಳಿ ಮನೆಗಳಿಗೆ ನೀರು ನುಗ್ಗಿದೆ. ಜಲಾವೃತಗೊಂಡ ಪ್ರದೇಶಗಳಿಗೆ ಉಪವಿಭಾಗಾಧಿಕಾರಿ ಟಿ.ವಿ ಪ್ರಕಾಶ್, ತಹಸೀಲ್ದಾರ್ ನಾಗರಾಜ್, ನಗರಸಭೆ ಪೌರಾಯುಕ್ತ ಮನೋಹ್ ಸೇರಿದಂತೆ ಇನ್ನಿತರ ಅಧಿಕಾರಿಗಳನ್ನೊಳಗೊಂಡ ತಂಡ ಭೇಟಿ ನೀಡಿ ಪರಿಶೀಲನೆ ನಡೆಸಿದೆ.

ಚಿತ್ರ: ಡಿ೨೦-ಬಿಡಿವಿಟ೩
ಭದ್ರಾ ಜಲಾಶಯದಿಂದ ಹೆಚ್ಚುವರಿ ನೀರು ನದಿಗೆ ಬಿಟ್ಟ ಹಿನ್ನಲೆಯಲ್ಲಿ ನಗರದ ಹೊಸಸೇತುವೆ ಭಾನುವಾರ ಸಂಪೂರ್ಣವಾಗಿ ಮುಳುಗಡೆಯಾಗಿರುವುದು.

ಚಿತ್ರ: ಡಿ೨೦-ಬಿಡಿವಿಟಿ೪
ಭದ್ರಾ ಜಲಾಶಯದಿಂದ ಹೆಚ್ಚುವರಿ ನೀರು ನದಿಗೆ ಬಿಟ್ಟ ಹಿನ್ನಲೆಯಲ್ಲಿ ತಗ್ಗು ಪ್ರದೇಶಗಳಿಗೆ ನೀರು ನುಗ್ಗಿದ್ದು, ಜಲಾವೃತಗೊಂಡ ಪ್ರದೇಶಗಳಿಗೆ ಉಪವಿಭಾಗಾಧಿಕಾರಿ ಟಿ.ವಿ ಪ್ರಕಾಶ್ ನೇತೃತ್ವದ ಅಧಿಕಾರಿಗಳ ತಂಡ ಭೇಟಿ ನೀಡಿ ಪರಿಶೀಲನೆ ನಡೆಸಿತು.