Thursday, September 24, 2020

ಕೇಂದ್ರ, ರಾಜ್ಯ ಸರ್ಕಾರಗಳ ರೈತ ವಿರೋಧಿ ಧೋರಣೆಗಳಿಗೆ ಖಂಡನೆ

ಸೆ.೨೮ರ ಕರ್ನಾಟಕ ಬಂದ್‌ಗೆ ಕಾಂಗ್ರೆಸ್ ಬೆಂಬಲ

ಕೇಂದ್ರ, ರಾಜ್ಯ ಸರ್ಕಾರಗಳ ರೈತ ವಿರೋಧಿ ನೀತಿಗಳನ್ನು ಖಂಡಿಸಿ ಸೆ.೨೮ರಂದು ಕರೆ ನೀಡಲಾಗಿರುವ ಬಂದ್‌ಗೆ ಪೂರಕ ಬೆಂಬಲ ನೀಡುವ ಸಂಬಂಧ ತಾಲೂಕು ಬ್ಲಾಕ್ ಕಾಂಗ್ರೆಸ್ ಸಮಿತಿ ವತಿಯಿಂದ ಗುರುವಾರ ಪತ್ರಿಕಾಗೋಷ್ಠಿ ನಡೆಯಿತು.
ಭದ್ರಾವತಿ, ಸೆ. ೨೪: ಜನ ವಿರೋಧಿ, ರೈತ ವಿರೋಧಿ ಧೋರಣೆಗಳನ್ನು ಕಾಂಗ್ರೆಸ್ ಪಕ್ಷ ಖಂಡಿಸುತ್ತದೆ. ರೈತರಿಗೆ ಮಾರಕವಾಗಿರುವ ಕಾಯ್ದೆಗಳನ್ನು ಜಾರಿಗೊಳಿಸಲು ಮುಂದಾಗುತ್ತಿರುವ ಸರ್ಕಾರದ ಕ್ರಮವನ್ನು ವಿರೋಧಿಸಿ ಸೆ.೨೮ರಂದು ಹಮ್ಮಿಕೊಳ್ಳಲಾಗಿರುವ ಕರ್ನಾಟಕ ಬಂದ್‌ಗೆ ಕಾಂಗ್ರೆಸ್ ಪಕ್ಷ ಬೆಂಬಲ ನೀಡುತ್ತದೆ ಎಂದು ತಾಲೂಕು ಬ್ಲಾಕ್ ಕಾಂಗ್ರೆಸ್ ಸಮಿತಿ ಮುಖಂಡರು ಸ್ಪಷ್ಟಪಡಿಸಿದರು.
      ಅವರು ಗುರುವಾರ ಹಮ್ಮಿಕೊಳ್ಳಲಾಗಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು. ಕೇಂದ್ರ ಹಾಗು ರಾಜ್ಯ ಸರ್ಕಾರಗಳು ರೈತ ವಿರೋಧಿ ಮಸೂದೆಗಳನ್ನು ಜಾರಿಗೆ ತರಲು ಮುಂದಾಗುತ್ತಿರುವುದು ವಿಷಾದನೀಯ ಸಂಗತಿಯಾಗಿದೆ ಎಂದರು.
      ಭೂ ಸುಧಾರಣೆ ಕಾಯ್ದೆ ತಿದ್ದುಪಡಿ, ಎಪಿಎಂಸಿ ಕಾಯ್ದೆ ತಿದ್ದುಪಡಿ, ವಿದ್ಯುಚ್ಛಕ್ತಿ ಕಾಯ್ದೆ ತಿದ್ದುಪಡಿ ೩ ಮಸೂದೆಗಳನ್ನು ಚರ್ಚೆಗೆ ಅವಕಾಶ ನೀಡದೇ ಸುಗ್ರೀವಾಜ್ಞೆ ಮೂಲಕ ಸಂಸತ್ತಿನಲ್ಲಿ ಅಂಗೀಕರಿಸಲಾಗಿದೆ. ಈ ಮಸೂದೆಗಳ ವಿರುದ್ಧ ರೈತ ಸಂಘ ಸೇರಿದಂತೆ ಹಲವು ಸಂಘಟನೆಗಳು ಹೋರಾಟಕ್ಕೆ ಮುಂದಾಗಿವೆ. ಹೋರಾಟಕ್ಕೆ ಪೂರಕವಾಗಿ ಕಾಂಗ್ರೆಸ್ ಸಹ ಬೆಂಬಲ ನೀಡಲಿದೆ ಎಂದರು.
       ಭೂ ಸುಧಾರಣೆ ಕಾಯ್ದೆ ತಿದ್ದುಪಡಿಯಿಂದ ಬಡವರ ಜಮೀನು ಶ್ರೀಮಂತರ ಪಾಲಾಗುವಂತೆ ಮಾಡಲಾಗುತ್ತಿದೆ. ರೆಸಾರ್ಟ್, ಲೇಔಟ್, ಬಡಾವಣೆ ಸೇರಿದಂತೆ ಇನ್ನಿತರ ವಾಣಿಜ್ಯ ಕೇಂದ್ರಗಳಾಗಿ ರೈತರ ಕೃಷಿ ಭೂಮಿಯನ್ನು ಮಾರ್ಪಾಡು ಮಾಡಲಾಗುತ್ತಿದೆ.  ಆಹಾರ ಭದ್ರತೆ ಕಾಯ್ದೆಯಡಿಯಲ್ಲಿ ಜಾರಿಗೆ ತರಲಾಗಿದ್ದ ಪಡಿತರ ವ್ಯವಸ್ಥೆಯನ್ನೂ ಸಹ ಸರ್ಕಾರ ಕಿತ್ತುಕೊಂಡು ಬಡವರು ಹಾಗು ರೈತರನ್ನು ನಿರ್ನಾಮ ಮಾಡಲು ಹೊರಟಿದೆ ಎಂದು ಆರೋಪಿಸಿದರು.
       ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ ರೈತರ ಹಿತಕಾಯುವಲ್ಲಿ ಮುಂದಾಗಿದೆ. ರೈತರು ಬೆಳೆದ ಬೆಳೆಗಳಿಗೆ ಕನಿಷ್ಟ ಬೆಂಬಲ ಬೆಲೆ ನಿಗದಿ ಪಡಿಸಿ ಉತ್ತಮ ಬೆಲೆಗೆ ಮಾರಾಟ ಮಾಡುವಂತೆ ವ್ಯವಸ್ಥೆ ಕಲ್ಪಿಸಲಾಗಿತ್ತು. ಆದರೆ ಪ್ರಸ್ತುತ ತಿದ್ದುಪಡಿ ಕಾಯ್ದೆಯಿಂದಾಗಿ ರೈತರು ಸಮಿತಿಯಲ್ಲಿ ಉತ್ಪನ್ನಗಳನ್ನು ಮಾರಾಟ ಮಾಡುವ ಅವಕಾಶ ತಪ್ಪಿಹೋಗಿದೆ. ಬಂಡವಾಳ ಶಾಯಿಗಳು ನಿಗದಿಪಡಿಸಿದ ಬೆಲೆಗೆ ರೈತರು ಉತ್ಪನ್ನಗಳನ್ನು ಮಾರಾಟ ಮಾಡಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ. ಅಲ್ಲದೆ ರೈತರು ಪ್ರಶ್ನಿಸುವ ಅಧಿಕಾರ ಕಳೆದುಕೊಂಡಂತಾಗಿದೆ ಎಂದು ದೂರಿದರು.
      ಪತ್ರಿಕಾಗೋಷ್ಠಿಯಲ್ಲಿ ನಗರಸಭೆ ಮಾಜಿ ಅಧ್ಯಕ್ಷ ಬಿ.ಕೆ ಮೋಹನ್, ಬ್ಲಾಕ್ ಕಾಂಗ್ರೆಸ್ ಸಮಿತಿ ನಗರ ಘಟಕದ ಅಧ್ಯಕ್ಷ ಟಿ. ಚಂದ್ರೇಗೌಡ, ಗ್ರಾಮಾಂತರ ಘಟಕದ ಅಧ್ಯಕ್ಷ ಎಚ್.ಎಲ್. ಷಡಾಕ್ಷರಿ, ಮಹಿಳಾ ಘಟಕದ ಅಧ್ಯಕ್ಷೆ ಮಂಜುಳ ರಾಮಚಂದ್ರ, ಎಪಿಎಂಸಿ ಅಧ್ಯಕ್ಷ ಲವೇಶ್‌ಗೌಡ, ಮುಖಂಡರಾದ ಮಹಮದ್ ಸನಾವುಲ್ಲಾ, ರಾಘವೇಂದ್ರ, ಆಂಜನಪ್ಪ, ಪುಟ್ಟೇಗೌಡ, ಜಯರಾಜ್, ಅಮೀರ್‌ಜಾನ್, ಚನ್ನಪ್ಪ, ಅರುಣ್, ರೂಪಾ ನಾರಾಯಣ, ಅಣ್ಣೋಜಿರಾವ್, ಗೋಪಿ, ನಂಜಪ್ಪ, ರಾಜು, ಶಿವಕುಮಾರ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

Wednesday, September 23, 2020

ಮನೆಗಳ್ಳತನ ಪ್ರಕರಣ ಇಬ್ಬರ ಬಂಧನ : ಲಕ್ಷಾಂತರ ರು. ಮೌಲ್ಯದ ಚಿನ್ನಾಭರಣ ವಶ

ಮನೆಗಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರನ್ನು ಬಂಧಿಸಿ ಲಕ್ಷಾಂತರ ರು. ಮೌಲ್ಯದ ಚಿನ್ನಾಭರಣ ವಶಪಡಿಸಿಕೊಳ್ಳುವಲ್ಲಿ ಭದ್ರಾವತಿ ಗ್ರಾಮಾಂತರ ಠಾಣೆ ಪೊಲೀಸರು ಯಶಸ್ವಿಯಾಗಿರುವುದು.
ಭದ್ರಾವತಿ, ಸೆ. ೨೩:  ಮನೆಗಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರನ್ನು ಬಂಧಿಸಿ ಲಕ್ಷಾಂತರ ರು. ಮೌಲ್ಯದ ಚಿನ್ನಾಭರಣ ವಶಪಡಿಸಿಕೊಳ್ಳುವಲ್ಲಿ ಇಲ್ಲಿನ ಗ್ರಾಮಾಂತರ ಠಾಣೆ ಪೊಲೀಸರು ಯಶಸ್ವಿಯಾಗಿರುವ ಘಟನೆ ಬುಧವಾರ ನಡೆದಿದೆ.
     ದಾವಣಗೆರೆ ಚನ್ನಗಿರಿ ತಾಲೂಕಿನ ಮಾವಿನಕಟ್ಟೆ ನಿವಾಸಿಗಳಾದ ನಾಗರಾಜನಾಯ್ಕ(೨೪) ಮತ್ತು ಗಣೇಶನಾಯ್ಕ(೩೧) ಎಂಬುವರನ್ನು ಬಂಧಿಸಲಾಗಿದೆ. ಬಂಧಿತರಿಂದ ೫೦ ಗ್ರಾಂ. ತೂಕದ ಬಂಗಾರದ ಆಭರಣಗಳು, ೨೪೦ ಗ್ರಾಂ. ತೂಕದ ಬೆಳ್ಳಿಯ ಆಭರಣಗಳನ್ನು ವಶಪಡಿಸಿಕೊಳ್ಳಲಾಗಿದೆ. ವಶಪಡಿಸಿಕೊಂಡಿರುವ ಚಿನ್ನಾಭರಣಗಳ ಒಟ್ಟು ಅಂದಾಜು ಮೌಲ್ಯ ೨,೩೨,೫೦೦ ರು. ಗಳಾಗಿವೆ.
    ಈ ಇಬ್ಬರು ಬಂಧಿತರು ಹೊಳೆಹೊನ್ನೂರು ಅಶೋಕನಗರದ ಮನೆಯೊಂದರಲ್ಲಿ ೨೦ ಫೆಬ್ರವರಿ ೨೦೧೯ರಂದು ಹಾಗೂ ಬೆಳ್ಳಿಗೆರೆ ಗ್ರಾಮದ ಮನೆಯೊಂದರಲ್ಲಿ ೧೯ ಮೇ ೨೦೨೦ರಂದು ನಡೆದಿದ್ದ ಮನೆಗಳ್ಳತನ ಪ್ರಕರಣಗಳಲ್ಲಿ ಭಾಗಿಯಾಗಿದ್ದರು.
     ಕಳವು ಪ್ರಕರಣ ಬೇಧಿಸಲು ಪೊಲೀಸ್ ಉಪಾಧೀಕ್ಷಕ ಸುಧಾಕರ ಎಸ್. ನಾಯಕ್ ಮಾರ್ಗದರ್ಶನದಲ್ಲಿ ಗ್ರಾಮಾಂತರ ವೃತ್ತ ನಿರೀಕ್ಷಕ ಇ.ಓ ಮಂಜುನಾಥ್ ನೇತೃತ್ವದ ತಂಡ ರಚಿಸಲಾಗಿತ್ತು.

ಸಂಗಮೇಶ್ವರ್ ಅಭಿಮಾನಿಗಳಿಂದ ವಿಶೇಷ ಪೂಜೆ

ಭದ್ರಾವತಿ ಹೊಸಮನೆ ಹಿಂದೂ ಮಹಾಸಭಾ ಗಣಪತಿ ದೇವಸ್ಥಾನದಲ್ಲಿ ಕೊರೋನಾ ಸೋಂಕಿಗೆ ಒಳಗಾಗಿ ಚಿಕಿತ್ಸೆಗೆ ದಾಖಲಾಗಿರುವ ಶಾಸಕ ಬಿ.ಕೆ ಸಂಗಮೇಶ್ವರ್ ಶೀಘ್ರ ಗುಣಮುಖರಾಗಲಿ ಎಂದು ಪ್ರಾರ್ಥಿಸಿ ವಿಶೇಷ ಪೂಜೆ ಸಲ್ಲಿಸಲಾಯಿತು.
ಭದ್ರಾವತಿ, ಸೆ. ೨೩: ಕೊರೋನಾ ಸೋಂಕಿಗೆ ಒಳಗಾಗಿ ಬೆಂಗಳೂರಿನ ಮಣಿಪಾಲ್‌ಗೆ ಆಸ್ಪತ್ರೆಗೆ ಚಿಕಿತ್ಸೆಗೆ ದಾಖಲಾಗಿರುವ ಶಾಸಕ ಬಿ.ಕೆ ಸಂಗಮೇಶ್ವರ್ ಶೀಘ್ರ ಗುಣಮುಖರಾಗಲೆಂದು ಪ್ರಾರ್ಥಿಸಿ ನಗರದ ವಿವಿಧ ದೇವಾಲಯಗಳಲ್ಲಿ ಸಂಗಮೇಶ್ವರ್ ಅಭಿಮಾನಿಗಳ ಬಳಗದ ವತಿಯಿಂದ ವಿಶೇಷ ಪೂಜೆ ಸಲ್ಲಿಸಲಾಯಿತು.
       ಹೊಸಮನೆ ಹಿಂದೂ ಮಹಾಸಭಾ ಗಣಪತಿ ದೇವಸ್ಥಾನದಲ್ಲಿ ಹೊಸಮನೆ ಭಾಗದ ಸಂಗಮೇಶ್ವರ್ ಅಭಿಮಾನಿಗಳು ವಿಶೇಷ ಪೂಜೆ ಸಲ್ಲಿಸುವ ಮೂಲಕ ಪ್ರಾರ್ಥಿಸಿದರು.
      ಪ್ರಮುಖರಾದ ಸುಂದರ್‌ಬಾಬು, ಪುಟ್ಟೇಗೌಡ, ವೈ. ನಟರಾಜ್, ಕೆ. ಸುದೀಪ್ ಕುಮಾರ್, ನಾಗೇಶ್, ಎಚ್.ಎಸ್ ಮಂಜು, ಶಿವಾಜಿ, ಭೈರಣ್ಣ, ರಾಜೇಶ್, ಹನುಮಂತ, ಅಜಯ್, ಕೇಶವ, ಪ್ರದೀಪ್, ಲೋಕೇಶ್ ಸೇರಿದಂತೆ ಇನ್ನಿತರರು ಪಾಲ್ಗೊಂಡಿದ್ದರು.
    ಇದೆ ರೀತಿ ನ್ಯೂಟೌನ್ ಭಾಗದಲ್ಲಿ ಜನ್ನಾಪುರ ಶ್ರೀ ಮಹಾಗಣಪತಿ ದೇವಸ್ಥಾನದಲ್ಲಿ ಅಭಿಮಾನಿಗಳು ಮತ್ತು ಹಿರಿಯ ನಾಗರೀಕರು ದೇವಸ್ಥಾನದ ಪ್ರಧಾನ ಅರ್ಚಕ ವೇದಬ್ರಹ್ಮ ಕೃಷ್ಣಮೂರ್ತಿ ಸೋಮಯಾಜಿ ಸಮ್ಮುಖದಲ್ಲಿ ವಿಶೇಷ ಪೂಜೆ ಸಲ್ಲಿಸಿದರು.

ಭದ್ರಾವತಿ ಜನ್ನಾಪುರ ಶ್ರೀ ಮಹಾಗಣಪತಿ ದೇವಸ್ಥಾನದಲ್ಲಿ ಕೊರೋನಾ ಸೋಂಕಿಗೆ ಒಳಗಾಗಿ ಚಿಕಿತ್ಸೆಗೆ ದಾಖಲಾಗಿರುವ ಶಾಸಕ ಬಿ.ಕೆ ಸಂಗಮೇಶ್ವರ್ ಶೀಘ್ರ ಗುಣಮುಖರಾಗಲಿ ಎಂದು ಪ್ರಾರ್ಥಿಸಿ ವಿಶೇಷ ಪೂಜೆ ಸಲ್ಲಿಸಲಾಯಿತು.
      ಕೇರಳ ಸಮಾಜಂ ವತಿಯಿಂದ ವಿಶೇಷ ಪೂಜೆ:
ತಾಲೂಕು ಕೇರಳ ಸಮಾಜಂ ವತಿಯಿಂದ ನ್ಯೂಟೌನ್ ಶ್ರೀ ಅಯ್ಯಪ್ಪ ಸ್ವಾಮಿ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಲಾಯಿತು. ಕೇರಳ ಸಮಾಜಂ ಅಧ್ಯಕ್ಷರು, ಪದಾಧಿಕಾರಿಗಳು ಸೇರಿದಂತೆ ಪ್ರಮುಖರು ಪಾಲ್ಗೊಂಡಿದ್ದರು.

ಆನ್‌ಲೈನ್‌ನಲ್ಲಿ ಮಕ್ಕಳ ಸಾಹಿತ್ಯ ಸಮ್ಮೇಳನ

ಭದ್ರಾವತಿ, ಸೆ. ೨೩: ಜಿಲ್ಲಾ ಕನ್ನಡ ಸಾಹಿತ್ಯ ಸಾಂಸ್ಕೃತಿಕ ವೇದಿಕೆ ವತಿಯಿಂದ ಈ ಬಾರಿ ಕೊರೋನಾ ಸೋಂಕಿನ ಹಿನ್ನಲೆಯಲ್ಲಿ ಆನ್‌ಲೈನ್‌ನಲ್ಲಿ ಮಕ್ಕಳ ಸಾಹಿತ್ಯ ಸಮ್ಮೇಳನ ಹಮ್ಮಿಕೊಳ್ಳಲಾಗಿದೆ.
       ತಾಲೂಕಿನ ಪ್ರಾಥಮಿಕ, ಪ್ರೌಢ ಹಾಗು ಪದವಿ ಪೂರ್ವ ಕಾಲೇಜಿನ ಪ್ರತಿಭಾವಂತ ವಿದ್ಯಾರ್ಥಿಗಳಿಗಾಗಿ ಆನ್‌ಲೈನ್ ಮತ್ತು ಫೇಸ್‌ಬುಕ್ ತಂತ್ರಜ್ಞಾನ ಬಳಸಿ ಸಮ್ಮೇಳನ ನಡೆಸಲಾಗುತ್ತಿದೆ. ಸಮ್ಮೇಳನಕ್ಕೆ ಆಯ್ಕೆಯಾದ ವಿದ್ಯಾರ್ಥಿಗಳಿಗೆ ಸ್ವರಚಿತ ಕಥೆ, ಕವನ, ಹನಿಗವನ, ಪ್ರಬಂಧ, ಜಾನಪದ ಮತ್ತು ಭಾವಗೀತೆ ಆನಾವರಣಕ್ಕೆ ಅವಕಾಶ ಕಲ್ಪಿಸಲಾಗಿದೆ.
      ಪ್ರಬಂಧ ಬರೆಯುವವರು ೧. ಸ್ವಾಭಾವಿಕ ಅರಣ್ಯ ಉಳಿಸಲು, ಪರಿಸರ ನಾಶ ತಡೆಯಲು ನಿಮ್ಮ ಚಿಂತನೆಗಳು, ೨. ಕರ್ನಾಟಕ ರಾಜ್ಯ ಸರ್ಕಾರದ ವಿದ್ಯಾಗಮ ಯೋಜನೆಯ ಸಾಧಕ-ಭಾದಕಗಳು, ೩. ಹೊಸ ರಾಷ್ಟ್ರೀಯ ಶಿಕ್ಷಣ ನೀತಿ ಮತ್ತು ೪. ಶಾಲಾ ಶಿಕ್ಷಣದಲ್ಲಿ ಪಠ್ಯೇತರ ಚಟುವಟಿಕೆಗಳ ಮಹತ್ವ ಇತ್ಯಾದಿ ವಿಚಾರಗಳನ್ನು ಅನಾವರಣಗೊಳಿಸುವಂತಿರಬೇಕು.
      ಆಸಕ್ತ ಪ್ರತಿಭಾವಂತ ವಿದ್ಯಾರ್ಥಿಗಳು ಸೆ.೩೦ರೊಳಗೆ ಸಮ್ಮೇಳನದಲ್ಲಿ ಭಾವಹಿಸುವ ಕುರಿತು ವಾಟ್ಸ್‌ಪ್ ಸಂಖ್ಯೆ ಕೋಗಲೂರು ತಿಪ್ಪೇಸ್ವಾಮಿ : ೯೦೦೮೫೧೫೪೩೨, ಎಂ.ಆರ್ ಮಂಜುನಾಥ್ : ೯೭೪೦೫೫೯೨೩೯, ಬಿ. ಮಂಜಪ್ಪ: ೯೯೦೦೮೩೦೨೮೫ ಮತ್ತು ಎಸ್.ಎನ್ ಶಶಿಕುಮಾರ್ : ೮೦೭೩೬೩೩೩೫೩ ಮಾಹಿತಿ ನೀಡಬಹುದಾಗಿದೆ ಎಂದು ವೇದಿಕೆ ತಾಲೂಕು ಅಧ್ಯಕ್ಷ ಕೋಗಲೂರು ತಿಪೇಸ್ವಾಮಿ ತಿಳಿಸಿದ್ದಾರೆ.

ಪೌರಕಾರ್ಮಿಕರು ಆರೋಗ್ಯದ ಬಗ್ಗೆ ಹೆಚ್ಚಿನ ಕಾಳಜಿ ವಹಿಸಿ : ನಾಗೇಂದ್ರ ಹೊನ್ನಾಳಿ

ಭದ್ರಾವತಿ ನಗರಸಭೆ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದ್ದ ಪೌರಕಾರ್ಮಿಕರ ದಿನಾಚರಣೆ ಕಾರ್ಯಕ್ರಮದಲ್ಲಿ ಜಿಲ್ಲಾ ನಗರಾಭಿವೃದ್ಧಿ ಕೋಶ ಯೋಜನಾ ನಿರ್ದೇಶಕ ನಾಗೇಂದ್ರ ಹೊನ್ನಾಳಿ ಮಾತನಾಡಿದರು.
ಭದ್ರಾವತಿ, ಸೆ. ೨೩: ಪೌರಕಾರ್ಮಿಕರು ತಮ್ಮ ಆರೋಗ್ಯದ ಬಗ್ಗೆ ಹೆಚ್ಚಿನ ಕಾಳಜಿವಹಿಸಬೇಕೆಂದು ಜಿಲ್ಲಾ ನಗರಾಭಿವೃದ್ಧಿ ಕೋಶ ಯೋಜನಾ ನಿರ್ದೇಶಕ ನಾಗೇಂದ್ರ ಹೊನ್ನಾಳಿ ತಿಳಿಸಿದರು.
ಅವರು ಬುಧವಾರ ನಗರಸಭೆ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದ್ದ ಪೌರಕಾರ್ಮಿಕರ ದಿನಾಚರಣೆ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದರು.
         ಪ್ರಸ್ತುತ ಬಹುತೇಕ ಪೌರಕಾರ್ಮಿಕರು ಅನುಕಂಪದ ಆಧಾರದ ಮೇಲೆ ಉದ್ಯೋಗ ಪಡೆದು ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಇದನ್ನು ಗಮನಿಸಿದಾಗ ಪೌರಕಾರ್ಮಿಕರು ತಮ್ಮ ಕರ್ತವ್ಯದ ಅವಧಿ ಮುಕ್ತಾಯಗೊಳ್ಳುವ ಮೊದಲೇ ಮರಣ ಹೊಂದುತ್ತಿದ್ದಾರೆ. ಸರ್ಕಾರ ಈ ಬಗ್ಗೆ ಗಂಭೀರವಾಗಿ ಚಿಂತಿಸುವ ಜೊತೆಗೆ ಪೌರಕಾರ್ಮಿಕರ ಆರೋಗ್ಯ ಸುಧಾರಣೆಗಾಗಿ ಹಲವಾರು ಯೋಜನೆಗಳನ್ನು ಜಾರಿಗೆ ತಂದಿದೆ. ಈ ಹಿನ್ನಲೆಯಲ್ಲಿ ಮೊದಲು ಪೌರಕಾರ್ಮಿಕರು ತಮ್ಮ ಆರೋಗ್ಯದ ಕಡೆ ಹೆಚ್ಚಿನ ಗಮನ ನೀಡುವ ಜೊತೆಗೆ ಸರ್ಕಾರದ ಯೋಜನೆಗಳನ್ನು ಸದ್ಬಳಕೆ ಮಾಡಿಕೊಳ್ಳಬೇಕೆಂದರು.
      ಜಿಲ್ಲೆಯಲ್ಲಿ ಭದ್ರಾವತಿ ನಗರಸಭೆ ಉತ್ತಮವಾಗಿ ಕಾರ್ಯನಿರ್ವಹಿಸುತ್ತಿದ್ದು, ಅದರಲ್ಲೂ ಕೊರೋನಾ ಸಂದರ್ಭದಲ್ಲೂ ತಮ್ಮ ಜೀವದ ಹಂಗನ್ನು ತೊರೆದು ಕರ್ತವ್ಯದಲ್ಲಿ ತೊಡಗಿಸಿಕೊಂಡಿರುವುದು ಶ್ಲಾಘನೀಯ. ಇಂತಹ ಸಂದಿಗ್ದ ಪರಿಸ್ಥಿತಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಪೌರಕಾರ್ಮಿಕರಿಗೆ ವೇತನ, ಪಡಿತರ ವಿತರಣೆ ಸೇರಿದಂತೆ ಇನ್ನಿತರ ಸೌಲಭ್ಯಗಳು ಸಕಾಲದಲ್ಲಿ ತಲುಪಬೇಕು. ಈ ನಿಟ್ಟಿನಲ್ಲಿ ಆಡಳಿತ ನಡೆಸುವ ಸರ್ಕಾರ, ಅಧಿಕಾರಿಗಳ ವರ್ಗ ಸೇರಿದಂತೆ ಎಲ್ಲರ ಸಹಕಾರ ಅಗತ್ಯವಾಗಿದೆ ಎಂದರು.  


ಭದ್ರಾವತಿ ನಗರಸಭೆ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದ್ದ ಪೌರಕಾರ್ಮಿಕರ ದಿನಾಚರಣೆ ಕಾರ್ಯಕ್ರಮದಲ್ಲಿ ಹಿರಿಯ ಪೌರಕಾರ್ಮಿಕರನ್ನು ಸನ್ಮಾನಿಸಿ ಗೌರವಿಸಲಾಯಿತು.
     ನಗರಸಭೆ ಆಡಳಿತಾಧಿಕಾರಿ, ಉಪವಿಭಾಗಾಧಿಕಾರಿ ಟಿ.ವಿ ಪ್ರಕಾಶ್ ಮಾತನಾಡಿ, ಪ್ರಸ್ತುತ ನಗರಸಭೆಯಲ್ಲಿ ಪೌರಕಾರ್ಮಿಕರು ಮತ್ತು ಅಧಿಕಾರಿ ವರ್ಗದವರು ಸರಿಸಮಾನವಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಈ ಹಿನ್ನಲೆಯಲ್ಲಿ ಇಲ್ಲಿನ ನಿವಾಸಿಗಳು ಎಲ್ಲರನ್ನು ಗೌರವಪೂರ್ವಕವಾಗಿ ಕಾಣುತ್ತಿದ್ದಾರೆ. ಪೌರಕಾರ್ಮಿಕರಿಂದ ಹೆಚ್ಚಿನ ಸೇವೆ ಬಯಸುವ ನಾವು ಅವರಿಗೆ ಸಿಗಬೇಕಾದ ಸೌಲಭ್ಯಗಳನ್ನು ಸಹ ಸಮರ್ಪಕವಾಗಿ ತಲುಪಿಸುವ ನಿಟ್ಟಿನಲ್ಲಿ ಮುಂದಾಗಬೇಕೆಂದರು.
       ನಗರಸಭೆ ಪೌರಾಯುಕ್ತ ಮನೋಹರ್ ಮಾತನಾಡಿ, ನಗರಸಭೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಎಲ್ಲಾ ಪೌರಕಾರ್ಮಿಕರನ್ನು ಸಹ ಸರಿ ಸಮಾನವಾಗಿ ಕಾಣಲಾಗುತ್ತಿದೆ. ಎಲ್ಲರಿಗೂ ಸಹ ಅವರಿಗೆ ಸಿಗಬೇಕಾದ ಸೌಲಭ್ಯಗಳನ್ನು ಸಮಪರ್ಕವಾಗಿ ತಲುಪಿಸುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಲಾಗಿದೆ. ಮೊದಲು ಪೌರಕಾರ್ಮಿಕರ ಜೀವನ ಮಟ್ಟ ಸುಧಾರಣೆಯಾಗಬೇಕು. ಆಗ ಮಾತ್ರ ಇತರರು ನೆಮ್ಮದಿಯಾಗಿರಲು ಸಾಧ್ಯ ಎಂದರು.
     ಕಂದಾಯಾಧಿಕಾರಿ ರಾಜ್‌ಕುಮಾರ್ ಪ್ರಾಸ್ತಾವಿಕ ನುಡಿಗಳನ್ನಾಡಿದರು. ನಗರಸಭೆ ಇಂಜಿನಿಯರ್ ರಂಗನಾಥಪುರೆ, ಪೌರಕಾರ್ಮಿಕರ ಸಂಘದ ಅಧ್ಯಕ್ಷರು, ಪದಾಧಿಕಾರಿಗಳು ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.
    ಪೌರಕಾರ್ಮಿಕರ ಮಕ್ಕಳ ವಿದ್ಯಾಭ್ಯಾಸಕ್ಕೆ ನೆರವಾಗುವ ನಿಟ್ಟಿನಲ್ಲಿ ಶಾಲಾ ದಾಖಲಾತಿ ಶುಲ್ಕ ವಿತರಿಸಲಾಯಿತು. ಪ್ರತಿ ವರ್ಷದಂತೆ ಈ ಬಾರಿ ಸಹ ಪೌರಕಾರ್ಮಿಕರಿಗೆ ವಿಶೇಷ ಭತ್ಯೆ ವಿತರಿಸಲಾಯಿತು. ಹಿರಿಯ ಪೌರಕಾರ್ಮಿಕರನ್ನು ಸನ್ಮಾನಿಸಿ ಗೌರವಿಸಲಾಯಿತು.

Tuesday, September 22, 2020

ಮೊದಲ ಹಂತದ ‘ಕರ್ನಾಟಕದ ಕಲ್ಯಾಣ’ ಪಾದಯಾತ್ರೆ ಯಶಸ್ವಿ

ಕೇಂದ್ರ ಹಾಗು ರಾಜ್ಯ ಸರ್ಕಾರಗಳ ಆಡಳಿತ ವೈಫಲ್ಯ ಹಾಗು ಜನ ವಿರೋಧಿ ಧೋರಣೆಗಳನ್ನು ಖಂಡಿಸಿ ಸಂಯುಕ್ತ ಜನತಾದಳ ಮತ್ತು ಜನತಾ ಪರಿವಾರದ ಸಹಭಾಗಿತ್ವದಲ್ಲಿ ಸೆ.೧೮ ರಿಂದ ೨೧ರ ವರೆಗೆ ಹಮ್ಮಿಕೊಳ್ಳಲಾಗಿದ್ದ ಮೊದಲ ಹಂತದ ಕೋಲಾರದಿಂದ ಬೆಂಗಳೂರುವರೆಗೂ 'ಕರ್ನಾಟಕದ ಕಲ್ಯಾಣ' ಪಾದ ಯಾತ್ರೆಗೆ  ಜೆಡಿಯು  ಪಕ್ಷದ ರಾಜ್ಯಾಧ್ಯಕ್ಷ, ಮಾಜಿ ಶಾಸಕ ಮಹಿಮಾ ಜೆ. ಪಟೇಲ್  ಚಾಲನೆ ನೀಡಿದರು. 

ಭದ್ರಾವತಿ, ಸೆ. ೨೨: ಕೇಂದ್ರ ಹಾಗು ರಾಜ್ಯ ಸರ್ಕಾರಗಳ ಆಡಳಿತ ವೈಫಲ್ಯ ಹಾಗು ಜನ ವಿರೋಧಿ ಧೋರಣೆಗಳನ್ನು ಖಂಡಿಸಿ ಸಂಯುಕ್ತ ಜನತಾದಳ ಮತ್ತು ಜನತಾ ಪರಿವಾರದ ಸಹಭಾಗಿತ್ವದಲ್ಲಿ ಸೆ.೧೮ ರಿಂದ ೨೧ರ ವರೆಗೆ ಹಮ್ಮಿಕೊಳ್ಳಲಾಗಿದ್ದ ಮೊದಲ ಹಂತದ ಕೋಲಾರದಿಂದ ಬೆಂಗಳೂರುವರೆಗೂ 'ಕರ್ನಾಟಕದ ಕಲ್ಯಾಣ' ಪಾದ ಯಾತ್ರೆ ಯಶಸ್ವಿಯಾಗಿ ಮುಕ್ತಾಯಗೊಂಡಿತು.
         ಯಾತ್ರೆಗೆ  ಜೆಡಿಯು  ಪಕ್ಷದ ರಾಜ್ಯಾಧ್ಯಕ್ಷ, ಮಾಜಿ ಶಾಸಕ ಮಹಿಮಾ ಜೆ. ಪಟೇಲ್  ಚಾಲನೆ ನೀಡಿದರು.  ಪ್ರಸ್ತುತ ರಾಜ್ಯ ಸರ್ಕಾರ ರಾಜಕೀಯವಾಗಿ, ಅರ್ಥಿಕವಾಗಿ, ಔದ್ಯೋಗಿಕವಾಗಿ, ಶೈಕ್ಷಣಿಕವಾಗಿ, ಕೈಗಾರಿಕ ರಂಗದಲ್ಲಿ ಹಾಗು ರೈತರ ಹಿತ ಕಾಪಾಡುವಲ್ಲಿ ಸಾಕಷ್ಟು ಹಿನ್ನಡೆ ಅನುಭವಿಸಿದೆ. ಕೊರೋನಾ ಸೋಂಕಿನಿಂದ ಎಲ್ಲರೂ ಭಯಭೀತರಾಗಿದ್ದು, ಬದುಕು ಜರ್ಜಿರಿತಗೊಂಡಿದೆ. ಒಂದೆಡೆ ನೆರೆ ಹಾವಳಿಯಿಂದಾಗಿ ಉತ್ತರ ಕರ್ನಾಟಕದ ರೈತರು ಸಂಕಷ್ಟಕ್ಕೆ ಸಿಲುಕಿದ್ದು, ಮತ್ತೊಂದೆಡೆ ಕೇಂದ್ರ ಹಾಗು ರಾಜ್ಯ ಸರ್ಕಾರಗಳು ಯಾವುದೇ ಕ್ರಮ ಕೈಗೊಳ್ಳದೆ ನಿರ್ಲಕ್ಷ್ಯ ಧೋರಣೆ ಅನುಸರಿಸುತ್ತಿವೆ ಎಂದು ಆರೋಪಿಸಲಾಯಿತು.
       ಶಾಸಕ ಶರತ್ ಬಚ್ಚೆಗೌಡ,  ಜೆಡಿಯು ಪಕ್ಷದ  ವಿವಿಧ ಘಟಕಗಳ ಅಧ್ಯಕ್ಷರು, ಮುಖಂಡರು ಸೇರಿದಂತೆ ನೂರಾರು ಮಂದಿ ಪಾಲ್ಗೊಂಡಿದ್ದರು ಎಂದು ಭದ್ರಾವತಿ ನಗರದ ನಿವಾಸಿಗಳಾದ ರಾಜ್ಯ ಯುವ ಘಟಕದ ಉಪಾಧ್ಯಕ್ಷ ಶಶಿಕುಮಾರ್ ಎಸ್. ಗೌಡ ಹಾಗು ಕಾರ್ಯದರ್ಶಿ ಬಾಬು ದೀಪಕ್ ಕುಮಾರ್ ತಿಳಿಸಿದ್ದಾರೆ.

ಕೊರೋನಾ ವಾರಿಯರ್ಸ್‌ಗಳಾದ ಪೌರಕಾರ್ಮಿಕರ ಬದುಕು ಹಸನಾಗಲಿ

೧೫೦ಕ್ಕೂ ಹೆಚ್ಚು ಪೌರಕಾರ್ಮಿಕರ ಪೈಕಿ ಬಹುತೇಕರ ಬದುಕು ಹೇಳಿಕೊಳ್ಳುವಂತಿಲ್ಲ

ಕೊರೋನಾ ಸಂಕಷ್ಟಕ್ಕೆ ಒಳಗಾಗಿರುವ ಪೌರಕಾರ್ಮಿಕರನ್ನು ಗುರುತಿಸಿ ಮಹಿಳಾ ಸಂಘಟನೆಯೊಂದಿಗೆ ಆಹಾರ ಸಾಮಾಗ್ರಿಗಳನ್ನು ವಿತರಿಸಿ ಅವರ ನೆರವಿಗೆ ಮುಂದಾಗಿರುವುದು.
* ಅನಂತಕುಮಾರ್
ಭದ್ರಾವತಿ, ಸೆ. ೨೨: ಕಳೆದ ಸುಮಾರು ೬ ತಿಂಗಳುಗಳಿಂದ ಕೊರೋನಾ ಸಂಕಷ್ಟದ ನಡುವೆಯೂ ನಗರದ ಸ್ವಚ್ಛತೆಯೊಂದಿಗೆ ಸುಂದರ ಪರಿಸರಕ್ಕೆ ಕಾರಣಕರ್ತರಾಗಿರುವ ಪೌರಕಾರ್ಮಿಕರನ್ನು ನೆನಪು ಮಾಡಿಕೊಳ್ಳುವುದು ನಮ್ಮೆಲ್ಲರ ಕರ್ತವ್ಯವಾಗಿದೆ.
ದೇಶದಲ್ಲಿ ಕೊರೋನಾ ಸೋಂಕು ಕಾಣಿಸಿಕೊಂಡ ನಂತರ ನಡೆದಿರುವ ಬೆಳವಣಿಗೆಗಳು ಪ್ರತಿಯೊಬ್ಬರು ತಮ್ಮ ಬದುಕಿನ ಕೊನೆಯವರೆಗೂ ಮರೆಯಲು ಸಾಧ್ಯವಿಲ್ಲ. ಸೋಂಕು ಇಂದಿಗೂ ಕಡಿಮೆಯಾಗಿಲ್ಲ. ಪ್ರತಿದಿನ ಸಾವಿನ ಸಂಖ್ಯೆ ಏರಿಕೆಯಾಗುತ್ತಿದೆ. ಪ್ರತಿಷ್ಠಿತ ಗಣ್ಯ ವ್ಯಕ್ತಿಗಳು, ರಾಜಕಾರಣಿಗಳು, ವೈದ್ಯರು, ಪೊಲೀಸರು, ಶ್ರೀಸಾಮಾನ್ಯರು ಸೇರಿದಂತೆ ಎಲ್ಲರ ಸಾವು ನಮ್ಮೆದುರು ಕಂಡು ಬರುತ್ತಿದೆ.  ಮನೆಯಿಂದ ಹೊರಬರಲು ಅಸಾಧ್ಯವಾದ ಸ್ಥಿತಿ ನಿರ್ಮಾಣವಾಗಿದೆ. ಇಂತಹ ಪರಿಸ್ಥಿತಿಯಲ್ಲಿ ಹಗಲಿರುಳು ಸ್ವಚ್ಛತೆಯಲ್ಲಿ ತಮ್ಮನ್ನು ತೊಡಗಿಸಿಕೊಂಡು ಸುಂದರ ಪರಿಸರಕ್ಕೆ ಕಾರಣಕರ್ತರಾಗಿರುವವರು ಪೌರ ಕಾರ್ಮಿಕರು.  ಸರ್ಕಾರ ಇವರನ್ನು ನೆಪಮಾತ್ರಕ್ಕೆ ಕೊರೋನಾ ವಾರಿಯರ್ಸ್ ಎಂದು ಘೋಷಿಸಿ ಬಿಟ್ಟಿದೆ. ಆದರೆ ವಾಸ್ತವವಾಗಿ ಇವರ ಬದುಕು ಕೇಳಿವವರು ಯಾರು ಇಲ್ಲ.
         ಇಲ್ಲಿನ ನಗರಸಭೆಯಲ್ಲಿ ಸುಮಾರು ೨೫೦ಕ್ಕೂ ಹೆಚ್ಚು ಮಂದಿ ಪೌರಕಾರ್ಮಿಕರಿದ್ದು, ಈ ಪೈಕಿ ೯೫ ಕಾಯಂ, ೭೧ ಗುತ್ತಿಗೆ, ೨೮ ಶೌಚಾಲಯ ಕೆಲಸಗಾರರು, ೨೧ ಲೋಡರ್‍ಸ್, ೨೧ ಡ್ರೈವರ್ ಮತ್ತು ಕ್ಲೀನರ್ ಹಾಗು ೫೦ ಮನೆ ಮನೆ ಕಸ ಸಂಗ್ರಹಿಸುವವರು ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಬಹುತೇಕ ಪೌರಕಾರ್ಮಿಕರ  ಬದುಕು ಹೇಳಿಕೊಳ್ಳುವಂತಹ ಸ್ಥಿತಿಯಲ್ಲಿಲ್ಲ. ಈ ನಡುವೆ ನಗರಸಭೆಗೆ ಮನೋಹರ್ ಪೌರಾಯುಕ್ತರಾಗಿ ಬಂದ ನಂತರ ಕಳೆದ ೩-೪ ವರ್ಷಗಳಿಂದ ಪೌರಕಾರ್ಮಿಕರ ಸಮಸ್ಯೆಗಳು ಕಡಿಮೆಯಾಗಿವೆ ಎಂದರೆ ತಪ್ಪಾಗಲಾರದು. ಆದರೂ ಸಹ ಬಹುತೇಕ ಬೇಡಿಕೆಗಳು ಬಾಕಿ ಉಳಿದಿವೆ.
    ಪೌರಾಯುಕ್ತ ಮನೋಹರ್‌ರವರ ಪ್ರಯತ್ನದ ಫಲವಾಗಿ ನಗರದಲ್ಲಿ ಸೂರಿಲ್ಲದ ಪೌರಕಾರ್ಮಿಕರಿಗೆ ಸೂರು ಲಭಿಸುತ್ತಿದೆ. ಪೌರಕಾರ್ಮಿಕರ ವಸತಿ ಸಂಕೀರ್ಣ ರಂಗಪ್ಪ ವೃತ್ತ ಸಮೀಪದ ಜೈಭೀಮ ನಗರದಲ್ಲಿ ಇದೀಗ ಪ್ರಗತಿಯಲ್ಲಿದೆ. ನಿರಂತರ ಹೋರಾಟದ ಫಲವಾಗಿ ಪೌರಕಾರ್ಮಿಕರ ಕೆಲವೊಂದು ಬೇಡಿಕೆಗಳು ಈಡೇರಿವೆ. ವಾಸ್ತವ್ಯವಾಗಿ ಅವರ ಎಲ್ಲಾ ಬೇಡಿಕೆಗಳು ಈಡೇರಬೇಕಾಗಿದೆ.
       ಸಮಾಜದಲ್ಲಿ ಪೌರಕಾರ್ಮಿಕರ ಸೇವೆ ಅಮೂಲ್ಯ ಎಂಬುದು ಎಲ್ಲರಿಗೂ ತಿಳಿದಿರುವ ವಿಚಾರ. ಪೌರಕಾರ್ಮಿಕರಿಲ್ಲದ ಸಮಾಜ ಊಹಿಸಿಕೊಳ್ಳಲು ಸಾಧ್ಯವಿಲ್ಲ. ಪೌರಕಾರ್ಮಿಕರು ಎಂದಿಗೂ ಇತರೆ ಸರ್ಕಾರಿ ನೌಕರರಂತೆ ಬದುಕು ಕಟ್ಟಿಕೊಳ್ಳಲು ಸಾಧ್ಯವಿಲ್ಲ. ಏಕೆಂದರೆ ಅವರಿಗೆ ಬರುವ ವೇತನ ತೀರ ಕಡಿಮೆ. ಈ ಹಿನ್ನಲೆಯಲ್ಲಿ ಅವರ ಎಲ್ಲಾ ಬೇಡಿಕೆಗಳು ಈಡೇರಬೇಕು.  ಪ್ರತಿಯೊಬ್ಬರು ಅವರ ಪರವಾಗಿ ನಿಲ್ಲಬೇಕಾಗಿದೆ. ಅದರಲ್ಲೂ ಪ್ರಸ್ತುತ ಪರಿಸ್ಥಿತಿಯಲ್ಲಿ ಪೌರಕಾರ್ಮಿಕರ ಸೇವೆ ಮತ್ತಷ್ಟು ಮಹತ್ವ ಪಡೆದುಕೊಂಡಿದೆ. ಜೀವದ ಹಂಗು ತೊರೆದು ಕೊರೋನಾ ವಾರಿಯರ್ಸ್‌ಗಳಾಗಿ ಕರ್ತವ್ಯದಲ್ಲಿ ತೊಡಗಿಸಿಕೊಂಡಿರುವ ಪೌರಕಾರ್ಮಿಕರಿಗೆ ನಮ್ಮೆಲ್ಲರ ಗೌರವಪೂರ್ವಕ ನಮನ ಸಲ್ಲಬೇಕಾಗಿದೆ.


ನಗರದಲ್ಲಿ ಎಲ್ಲಿಬೇಕೆಂದರಲ್ಲಿ ಕಸ ಎಸೆಯಂದತೆ ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಸ್ವಚ್ಛತಾ ಕಾರ್ಯ ಕೈಗೊಂಡು ರಂಗೋಲಿ ಬಿಡಿಸಿ ಸುತ್ತಮುತ್ತಲಪರಿಸರ ಸುಂದಗೊಳಿಸಿರುವುದು.
      ಸೆ.೨೩ರಂದು ಪೌರಕಾರ್ಮಿಕರ ದಿನಾಚರಣೆ:
ಪ್ರತಿ ವರ್ಷದಂತೆ ಈ ಬಾರಿ ಸಹ ಪೌರಕಾರ್ಮಿಕರ ದಿನಾಚರಣೆ ಹಮ್ಮಿಕೊಳ್ಳಲಾಗಿದ್ದು, ಕೊರೋನಾ ಹಿನ್ನಲೆಯಲ್ಲಿ ಈ ಬಾರಿ ಸರಳವಾಗಿ ನಗರಸಭೆ ಆವರಣದಲ್ಲಿ ಕಾರ್ಯಕ್ರಮ ಆಯೋಜಿಸಲಾಗಿದೆ.
ನಗರಸಭೆ ಪೌರಾಯುಕ್ತ ಮನೋಹರ್, ಪೌರಕಾರ್ಮಿಕರ ಸಂಘದ ಅಧ್ಯಕ್ಷರು, ಪದಾಧಿಕಾರಿಗಳು  ಸೇರಿದಂತೆ ಇನ್ನಿತರರು ಪಾಲ್ಗೊಳ್ಳಲಿದ್ದಾರೆ. ಕಾರ್ಯಕ್ರಮ ಯಶಸ್ವಿಗೊಳಿಸುವಂತೆ ಕೋರಲಾಗಿದೆ.
    ಸ್ವಚ್ಛತಾ ಕಾರ್ಯ ಸ್ಥಗಿತ:
ಪೌರಕಾರ್ಮಿಕರ ದಿನಾಚರಣೆ ಹಿನ್ನಲೆಯಲ್ಲಿ ಪೌರಕಾರ್ಮಿಕರಿಗೆ ರಜೆ ಘೋಷಿಸಲಾಗಿದ್ದು, ಈ ಹಿನ್ನಲೆಯಲ್ಲಿ ನಗರದಲ್ಲಿ ಬುಧವಾರ ಸ್ವಚ್ಛತಾ ಕಾರ್ಯ ನಡೆಯುವುದಿಲ್ಲ. ಈ ಹಿನ್ನಲೆಯಲ್ಲಿ ಸಾರ್ವಜನಿಕರು ಸಹಕರಿಸುವಂತೆ ಪೌರಾಯುಕ್ತರು ಕೋರಿದ್ದಾರೆ.