ಮಾರಾಟಗಾರರಿಗೆ ತಹಸೀಲ್ದಾರ್ ಜಿ. ಸಂತೋಷ್‌ಕುಮಾರ್ ಎಚ್ಚರಿಕೆ
ಭದ್ರಾವತಿ, ನ. ೧೩: ಕೋವಿಡ್-೧೯ರ ಹಿನ್ನೆಲೆಯಲ್ಲಿ ಸರ್ಕಾರದ ಸೂಚನೆಗಳನ್ನು ಅನುಸರಿಸಿ ಕೇವಲ ಹಸಿರು ಪಟಾಕಿಗಳನ್ನು ಮಾತ್ರ ಮಾರಾಟ ಮಾಡಲು ಅನುಮತಿ ನೀಡಲಾಗಿದೆ. ನಿಯಮ ಮೀರಿದರೆ ಕಠಿಣ ಕ್ರಮ ಕೈಗೊಳ್ಳುವುದಾಗಿ ತಹಸೀಲ್ದಾರ್ ಜಿ. ಸಂತೋಷ್ ಕುಮಾರ್ ಪರವಾನಗಿ ಪಡೆದ ಪಟಾಕಿ ಮಾರಾಟಗಾರರಿಗೆ ಎಚ್ಚರಿಕೆ ನೀಡಿದರು.
ಅವರು ತಾಲೂಕು ಕಚೇರಿ ಸಭಾಂಗಣದಲ್ಲಿ ಪಟಾಕಿ ಮಾರಾಟಕ್ಕೆ ಸಂಬಂಧಿಸಿದಂತೆ ನಡೆಸಿದ ಸಭೆಯಲ್ಲಿ ಮಾತನಾಡಿ, ಪಟಾಕಿ ಮಾರಾಟಕ್ಕೆ ಸುಪ್ರೀಂಕೋರ್ಟ್ ಆದೇಶದಂತೆ ರಾಜ್ಯ ಸರ್ಕಾರ ಅವಕಾಶ ನೀಡಿದೆ. ಅಧಿಕೃತ ಪರವಾನಗಿದಾರರು ಮಾತ್ರ ಹಸಿರು ಪಟಾಕಿ ಮಾರಾಟ ಮಳಿಗೆಗಳನ್ನು ನ.೧೬ರ ವರೆಗೆ ಮಾತ್ರ ತೆರೆಯಬೇಕು. ಹಸಿರು ಪಟಾಕಿಗಳನ್ನು ಮಾತ್ರ ಮಾರಾಟ ಮಾಡಬೇಕು, ಮಳಿಗೆಗಳ ನಡುವೆ ೬ ಮೀಟರ್ ಅಂತರವಿರಬೇಕು, ಮಳಿಗೆಗಳ ಸುತ್ತಲೂ ಪ್ರತಿ ದಿನ ಸ್ಯಾನಿಟೈಜರ್ ಮಾಡಬೇಕು, ಪಟಾಕಿ ಖರೀದಿಗೆ ಬರುವ ಸಾರ್ವಜನಿಕರಿಗೆ ಸ್ಯಾನಿಟೈಸರ್ ಹಾಗೂ ಥರ್ಮಲ್ ಸ್ಕ್ರೀನಿಂಗ್ ವ್ಯವಸ್ಥೆ ಸೇರಿದಂತೆ ಕನಿಷ್ಠ ೬ ಅಡಿ ಸಾಮಾಜಿಕ ಅಂತರ ಕಾಯ್ದುಕೊಳ್ಳಬೇಕು, ಕಡ್ಡಾಯವಾಗಿ ಮಾಸ್ಕ್ ಧರಿಸಬೇಕೆಂದು ತಿಳಿಸಿದರು. ತಪ್ಪಿದಲ್ಲಿ ಕಾನೂನು ಕ್ರಮ ಜರುಗಿಸಲಾಗುವುದೆಂದು ಎಚ್ಚರಿಕೆ ನೀಡಿದರು.