Saturday, November 14, 2020

ಸುಪ್ರೀಂಕೋರ್ಟ್ ಮಾರ್ಗಸೂಚಿ ಉಲ್ಲಂಘಿಸಿ ಪಟಾಕಿ ಮಾರಾಟ : ಸೂಕ್ತ ಕ್ರಮಕ್ಕೆ ಆಗ್ರಹಿಸಿ ಶಶಿಕುಮಾರ್ ಎಸ್ ಗೌಡ ಏಕಾಂಗಿ ಹೋರಾಟ

ಸುಪ್ರೀಂಕೋರ್ಟ್ ಮಾರ್ಗಸೂಚಿಗಳನ್ನು ಉಲ್ಲಂಘಿಸಿ ಭದ್ರಾವತಿ ಪಟಾಕಿ ಮಾರಾಟ ಮಾಡಲಾಗುತ್ತಿದ್ದು, ಕಠಿಣ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿ ಜನತಾದಳ(ಸಂಯುಕ್ತ) ರಾಜ್ಯ ಉಪಾಧ್ಯಕ್ಷ ಶಶಿಕುಮಾರ್ ಎಸ್. ಗೌಡ ಏಕಾಂಗಿಯಾಗಿ ಶನಿವಾರ ನಗರಸಭೆ ಮುಂಭಾಗ ಹೋರಾಟ ನಡೆಸಿ ಮನವಿ ಸಲ್ಲಿಸಿದರು.
ಭದ್ರಾವತಿ, ನ. ೧೪: ಸುಪ್ರೀಂಕೋರ್ಟ್ ಮಾರ್ಗಸೂಚಿಗಳನ್ನು ಉಲ್ಲಂಘಿಸಿ ನಗರದಲ್ಲಿ ಪಟಾಕಿ ಮಾರಾಟ ಮಾಡಲಾಗುತ್ತಿದ್ದು, ಕಠಿಣ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿ ಜನತಾದಳ(ಸಂಯುಕ್ತ) ರಾಜ್ಯ ಉಪಾಧ್ಯಕ್ಷ ಶಶಿಕುಮಾರ್ ಎಸ್. ಗೌಡ ಏಕಾಂಗಿಯಾಗಿ ಶನಿವಾರ ನಗರಸಭೆ ಮುಂಭಾಗ ಹೋರಾಟ ನಡೆಸಿದರು.
     ಈ ಬಾರಿ ದೀಪಾವಳಿ ಹಬ್ಬದ ಹಿನ್ನಲೆಯಲ್ಲಿ ಸುಪ್ರೀಂ ಕೋರ್ಟ್ ಕೇವಲ ಹಸಿರು ಪಟಾಕಿ ಮಾರಾಟಕ್ಕೆ ಮಾತ್ರ ಅವಕಾಶ ನೀಡಿದ್ದು, ಕೆಲವು ಮಾರ್ಗಸೂಚಿಗಳನ್ನು ಕಡ್ಡಾಯವಾಗಿ ಪಾಲಿಸುವಂತೆ ಸೂಚಿಸಿದೆ. ಹಳೇನಗರದ ಕನಕಮಂಟಪ ಮೈದಾನ, ನ್ಯೂಟೌನ್ ಚರ್ಚ್ ಮೈದಾನದಲ್ಲಿ ಪ್ರತಿ ವರ್ಷದಂತೆ ಈ ಬಾರಿ ಸಹ ಪಟಾಕಿ ಮಾರಾಟಕ್ಕೆ ಅವಕಾಶ ಕಲ್ಪಿಸಿಕೊಡಲಾಗಿದೆ. ಆದರೆ ವ್ಯಾಪಾರಸ್ಥರು ಮಾರ್ಗಸೂಚಿಗಳನ್ನು ಸರಿಯಾಗಿ ಪಾಲಿಸುತ್ತಿಲ್ಲ. ಮಳಿಗೆಗಳ ನಡುವೆ ಮಾರ್ಗಸೂಚಿಯಂತೆ ಅಂತರ ನಿಗದಿಪಡಿಸಿಲ್ಲ. ಸ್ಯಾನಿಟೈಜರ್, ಮಾಸ್ಕ್ ಬಳಕೆ ಸಹ ಕಂಡು ಬರುತ್ತಿಲ್ಲ. ಈ ಹಿನ್ನಲೆಯಲ್ಲಿ ತಾಲೂಕು ಆಡಳಿತ ಮತ್ತು ನಗರಸಭೆ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿದರು.
ಪ್ರತಿಭಟನಾ ಸ್ಥಳಕ್ಕೆ ಆಗಮಿಸಿದ ತಹಸೀಲ್ದಾರ್ ಜಿ. ಸಂತೋಷ್‌ಕುಮಾರ್, ನಗರಸಭೆ ಪೌರಾಯುಕ್ತ ಮನೋಹರ್, ಪೊಲೀಸ್ ನಗರ ವೃತ್ತ ನಿರೀಕ್ಷಕ ರಾಘವೇಂದ್ರ ಕಾಂಡಿಕೆ, ಕಂದಾಯಾಧಿಕಾರಿ ಪ್ರಶಾಂತ್ ಮನವಿ ಸ್ವೀಕರಿಸಿ ಬೇಡಿಕೆ ಈಡೇರಿಸಿಕೊಡುವುದಾಗಿ ಭರವಸೆ ನೀಡಿದ್ದಾರೆ.
     ಮಾನವ ಹಕ್ಕುಗಳ ಹೋರಾಟ ಸಮಿತಿ ಅಧ್ಯಕ್ಷ ಬಿ.ಎನ್ ರಾಜು, ಕರ್ನಾಟಕ ರಕ್ಷಣಾ ವೇದಿಕೆ ತಾಲೂಕು ಅಧ್ಯಕ್ಷ ಬಿ.ವಿ ಗಿರೀಶ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

ಕನ್ನಡ ಶಾಲೆ ಉಳಿವಿಗಾಗಿ ಗೋಕಾಕ್ ಮಾದರಿ ಚಳುವಳಿ ಅನಿವಾರ್ಯ : ಬಿ.ಕೆ ಮೋಹನ್

ಭದ್ರಾವತಿ ಅಂಡರ್‌ಬ್ರಿಡ್ಜ್ ಬಳಿ ನೆಹರು ಆಟೋ ಚಾಲಕರ ಸಂಘದ ವತಿಯಿಂದ ಕನ್ನಡ ರಾಜ್ಯೋತ್ಸವ ಹಮ್ಮಿಕೊಳ್ಳಲಾಗಿತ್ತು.
ಭದ್ರಾವತಿ, ನ. ೧೪: ಪ್ರಸ್ತುತ ರಾಜ್ಯದಲ್ಲಿ ಕನ್ನಡ ಶಾಲೆಗಳು ಮುಚ್ಚಲ್ಪಡುತ್ತಿದ್ದು, ಕನ್ನಡ ಶಾಲೆಗಳ ಉಳಿವಿಗಾಗಿ ಈ ಹಿಂದೆ ವರನಟ  ಡಾ. ರಾಜ್‌ಕುಮಾರ್ ನೇತೃತ್ವದಲ್ಲಿ ನಡೆಸಿದ ಗೋಕಾಕ್ ಚಳುವಳಿ ಮಾದರಿಯಂತೆ ಹೋರಾಟ ನಡೆಸುವುದು ಅನಿವಾರ್ಯವಾಗಿದೆ ಎಂದು ನಗರಸಭೆ ಮಾಜಿ ಅಧ್ಯಕ್ಷ ಬಿ.ಕೆ ಮೋಹನ್ ಹೇಳಿದರು.
   ಅವರು ಶನಿವಾರ ಅಂಡರ್‌ಬ್ರಿಡ್ಜ್ ಬಳಿ ನೆಹರು ಆಟೋ ಚಾಲಕರ ಸಂಘದ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ಕನ್ನಡ ರಾಜ್ಯೋತ್ಸವದಲ್ಲಿ ಧ್ವಜಾರೋಹಣ ನೆರವೇರಿಸಿ ಮಾತನಾಡಿದರು.
ದೇಶದ ಇತರೆ ರಾಜ್ಯಗಳಿಗೆ ಹೋಲಿಕೆ ಮಾಡಿದ್ದಲ್ಲಿ ಕರ್ನಾಟಕ ರಾಜ್ಯ ವಿಭಿನ್ನವಾಗಿದ್ದು, ಎಲ್ಲಾ ಭಾಷೆಯ, ಎಲ್ಲಾ ಧರ್ಮದ ಜನರು ಇಲ್ಲಿ ನೆಲೆನಿಂತಿದ್ದಾರೆ. ಎಲ್ಲರನ್ನು ಪೋಷಿಸಿ ಸಲಹುವ ಶಕ್ತಿ ಈ ನಾಡು ಹೊಂದಿದ್ದು, ಇಂತಹ ನಾಡಿನ ನೆಲ, ಜಲ, ಭಾಷೆ ಮೇಲಿನ ಅಭಿಮಾನ ಹೆಚ್ಚಾಗಬೇಕೆಂದರು.
ಪ್ರಸ್ತುತ ಕೊರೊನಾ ಪರಿಣಾಮದಿಂದಾಗಿ ಎಲ್ಲರೂ ಸಂಕಷ್ಟಕ್ಕೆ ಒಳಗಾಗಿದ್ದು, ಇಂತಹ ಸಂದಿಗ್ದ ಪರಿಸ್ಥಿತಿಯಲ್ಲೂ ಆಟೋ ಚಾಲಕರು ಕನ್ನಡ ನಾಡಿನ ಮೇಲೆ ಅಭಿಮಾನ ಹೊಂದುವ ಮೂಲಕ ಕನ್ನಡ ರಾಜ್ಯೋತ್ಸವ ಆಚರಣೆ ಮಾಡುತ್ತಿರುವುದು ಶ್ಲಾಘನೀಯ ಕಾರ್ಯವಾಗಿದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.
    ಸಂಘದ ಅಧ್ಯಕ್ಷ ಕೃಷ್ಣಪ್ಪ ಅಧ್ಯಕ್ಷತೆ ವಹಿಸಿದ್ದರು. ಪ್ರಕಾಶ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು. ಕನ್ನಡ ಧ್ವಜದೊಂದಿಗೆ ಆಟೋ ಚಾಲಕರು ನಗರದ ವಿವಿಧೆಡೆ ಸಂಚರಿಸಿದರು.

Friday, November 13, 2020

ಹಸಿರು ಪಟಾಕಿ ಮಾರಾಟಕ್ಕೆ ಮಾತ್ರ ಅವಕಾಶ : ನಿಯಮ ಉಲ್ಲಂಘಿಸಿದರೆ ಕಠಿಣ ಕ್ರಮ

ಮಾರಾಟಗಾರರಿಗೆ ತಹಸೀಲ್ದಾರ್ ಜಿ. ಸಂತೋಷ್‌ಕುಮಾರ್  ಎಚ್ಚರಿಕೆ

ಭದ್ರಾವತಿ, ನ. ೧೩: ಕೋವಿಡ್-೧೯ರ ಹಿನ್ನೆಲೆಯಲ್ಲಿ ಸರ್ಕಾರದ ಸೂಚನೆಗಳನ್ನು ಅನುಸರಿಸಿ ಕೇವಲ ಹಸಿರು ಪಟಾಕಿಗಳನ್ನು ಮಾತ್ರ ಮಾರಾಟ ಮಾಡಲು ಅನುಮತಿ ನೀಡಲಾಗಿದೆ. ನಿಯಮ ಮೀರಿದರೆ ಕಠಿಣ ಕ್ರಮ ಕೈಗೊಳ್ಳುವುದಾಗಿ ತಹಸೀಲ್ದಾರ್ ಜಿ. ಸಂತೋಷ್ ಕುಮಾರ್ ಪರವಾನಗಿ ಪಡೆದ ಪಟಾಕಿ ಮಾರಾಟಗಾರರಿಗೆ ಎಚ್ಚರಿಕೆ ನೀಡಿದರು.
      ಅವರು ತಾಲೂಕು ಕಚೇರಿ ಸಭಾಂಗಣದಲ್ಲಿ ಪಟಾಕಿ ಮಾರಾಟಕ್ಕೆ ಸಂಬಂಧಿಸಿದಂತೆ ನಡೆಸಿದ ಸಭೆಯಲ್ಲಿ ಮಾತನಾಡಿ, ಪಟಾಕಿ ಮಾರಾಟಕ್ಕೆ ಸುಪ್ರೀಂಕೋರ್ಟ್ ಆದೇಶದಂತೆ ರಾಜ್ಯ ಸರ್ಕಾರ ಅವಕಾಶ ನೀಡಿದೆ. ಅಧಿಕೃತ ಪರವಾನಗಿದಾರರು ಮಾತ್ರ ಹಸಿರು ಪಟಾಕಿ ಮಾರಾಟ ಮಳಿಗೆಗಳನ್ನು ನ.೧೬ರ ವರೆಗೆ ಮಾತ್ರ ತೆರೆಯಬೇಕು. ಹಸಿರು ಪಟಾಕಿಗಳನ್ನು ಮಾತ್ರ ಮಾರಾಟ ಮಾಡಬೇಕು, ಮಳಿಗೆಗಳ ನಡುವೆ ೬ ಮೀಟರ್ ಅಂತರವಿರಬೇಕು,  ಮಳಿಗೆಗಳ ಸುತ್ತಲೂ ಪ್ರತಿ ದಿನ ಸ್ಯಾನಿಟೈಜರ್ ಮಾಡಬೇಕು, ಪಟಾಕಿ ಖರೀದಿಗೆ ಬರುವ ಸಾರ್ವಜನಿಕರಿಗೆ ಸ್ಯಾನಿಟೈಸರ್ ಹಾಗೂ ಥರ್ಮಲ್ ಸ್ಕ್ರೀನಿಂಗ್ ವ್ಯವಸ್ಥೆ ಸೇರಿದಂತೆ ಕನಿಷ್ಠ ೬ ಅಡಿ ಸಾಮಾಜಿಕ ಅಂತರ ಕಾಯ್ದುಕೊಳ್ಳಬೇಕು, ಕಡ್ಡಾಯವಾಗಿ ಮಾಸ್ಕ್ ಧರಿಸಬೇಕೆಂದು ತಿಳಿಸಿದರು. ತಪ್ಪಿದಲ್ಲಿ ಕಾನೂನು ಕ್ರಮ ಜರುಗಿಸಲಾಗುವುದೆಂದು ಎಚ್ಚರಿಕೆ ನೀಡಿದರು.

ಹಿರಿಯ ಪತ್ರಕರ್ತ ರವಿಬೆಳಗೆರೆಗೆ ಸಂತಾಪ

ಭದ್ರಾವತಿ, ನ. ೧೩: ಹಿರಿಯ ಪತ್ರಕರ್ತ ರವಿಬೆಳಗೆರೆಯವರ ನಿಧನಕ್ಕೆ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದಿಂದ ಸಂತಾಪ ಸೂಚಿಸಲಾಯಿತು.
    ಹಳೇನಗರದ ಪತ್ರಿಕಾಭವನದಲ್ಲಿ ನಡೆದ ಸಭೆಯಲ್ಲಿ ಮೌನಾಚರಣೆ ನಡೆಸುವ ಮೂಲಕ ರವಿಬೆಳಗೆರೆ ನಿಧನದಿಂದ ಪತ್ರಿಕಾ ಕ್ಷೇತ್ರಕ್ಕೆ ತುಂಬಲಾರದ ನಷ್ಟ ಉಂಟಾಗಿದ್ದು, ಇವರ ಅಗಲಿಕೆಯಿಂದ ಉಂಟಾಗಿರುವ ದುಃಖವನ್ನು ಭರಿಸುವ ಶಕ್ತಿಯನ್ನು ಭಗವಂತ ಅವರ ಕುಟುಂಬ ವರ್ಗಕ್ಕೆ, ಅಭಿಮಾನಿಗಳಿಗೆ ಕರುಣಿಸಲೆಂದು ಪ್ರಾರ್ಥಿಸಲಾಯಿತು.
    ಇದೆ ರೀತಿ ಕೋವಿಡ್-೧೯ರ ಪರಿಣಾಮ ರಾಜ್ಯದ ವಿವಿಧೆಡೆ ಮೃತಪಟ್ಟಿರುವ ಎಲ್ಲಾ ಪತ್ರಕರ್ತರಿಗೂ ಸಂತಾಪ ಸೂಚಿಸಲಾಯಿತು. ಸಂಘದ ಅಧ್ಯಕ್ಷ ಕೆ.ಎನ್ ಶ್ರೀಹರ್ಷ ಅಧ್ಯಕ್ಷತೆ ವಹಿಸಿದ್ದರು.

ನಗರಸಭೆಗೆ ೧೦೦ ಕೋ. ರು. ವಿಶೇಷ ಅನುದಾನ ಸೇರಿದಂತೆ ವಿವಿಧ ಬೇಡಿಕೆ ಈಡೇರಿಸಲು ಆಗ್ರಹ

ಸಂಸದ ಬಿ.ವೈ ರಾಘವೇಂದ್ರರಿಗೆ ಸ್ಥಾಯಿ ಸಮಿತಿ ಮಾಜಿ ಅಧ್ಯಕ್ಷ ಆರ್. ವೇಣುಗೋಪಾಲ್ ನೇತೃತ್ವದಲ್ಲಿ ಮನವಿ

ಭದ್ರಾವತಿ ನಗರಸಭೆಗೆ ೧೦೦ ಕೋ. ರು. ವಿಶೇಷ ಅನುದಾನ ಸೇರಿದಂತೆ ವಿವಿಧ ಬೇಡಿಕೆ ಈಡೇರಿಸಲು ಆಗ್ರಹಿಸಿ ಸಂಸದ ಬಿ.ವೈ ರಾಘವೇಂದ್ರರಿಗೆ ಸ್ಥಾಯಿ ಸಮಿತಿ ಮಾಜಿ ಅಧ್ಯಕ್ಷ ಆರ್. ವೇಣುಗೋಪಾಲ್ ನೇತೃತ್ವದಲ್ಲಿ ಮನವಿ ಸಲ್ಲಿಸಲಾಯಿತು.
ಭದ್ರಾವತಿ, ನ. ೧೩: ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಸಂಸದ ಬಿ.ವೈ ರಾಘವೇಂದ್ರರಿಗೆ ನಗರದ ಭಾರತ ರತ್ನ ಸರ್.ಎಂ ವಿಶ್ವೇಶ್ವರಯ್ಯ ಚಾರಿಟಬಲ್ ಟ್ರಸ್ಟ್, ಶ್ರೀ ಡಿ. ದೇವರಾಜ ಅರಸು ಜನಸ್ಪಂದನ ವೇದಿಕೆ, ಸುವರ್ಣ ಮಹಿಳಾ ವೇದಿಕೆ ವತಿಯಿಂದ ನಗರಸಭೆ ಸ್ಥಾಯಿ ಸಮಿತಿ ಮಾಜಿ ಅಧ್ಯಕ್ಷ ಆರ್. ವೇಣುಗೋಪಾಲ್ ನೇತೃತ್ವದಲ್ಲಿ ಮನವಿ ಸಲ್ಲಿಸಲಾಯಿತು.
    ನಗರಸಭೆ ಅಸ್ತಿತ್ವಕ್ಕೆ ಬಂದು ೨೫ ವರ್ಷಗಳು ಕಳೆದಿದ್ದು, ಈ ಹಿನ್ನಲೆಯಲ್ಲಿ ಸರ್.ಎಂ ವಿಶ್ವೇಶ್ವರಯ್ಯನವರಿಗೆ ಗೌರವ ಸಲ್ಲಿಸುವ ದೃಷ್ಟಿಯಿಂದ ನಗರಸಭೆ ಜನ್ನಾಪುರ ಎನ್‌ಟಿಬಿ ಶಾಖಾ ಕಛೇರಿ ರ‍್ತೆಯಲ್ಲಿರುವ ನಗರಸಭೆ ಖಾಲಿ ನಿವೇಶನದಲ್ಲಿ ಸರ್.ಎಂ ವಿಶ್ವೇಶ್ವರಯ್ಯ ಸಾಂಸ್ಕೃತಿಕ ಭವನ ನಿರ್ಮಿಸಲು ೩ ಕೋ.ರು. ಹಾಗು ನಗರಸಭೆ ವ್ಯಾಪ್ತಿಯಲ್ಲಿ ಮೂಲ ಸೌಲಭ್ಯಗಳನ್ನು ಕಲ್ಪಿಸಲು ೧೦೦ ಕೋ. ರು. ವಿಶೇಷ ಅನುದಾನ ಬಿಡುಗಡೆಗೊಳಿಸಬೇಕೆಂದು ಮನವಿ ಮಾಡಲಾಗಿದೆ.
    ನಗರಸಭೆ ವ್ಯಾಪ್ತಿಯ ೬೯ ಕೆರೆಗಳನ್ನು ಅಭಿವೃದ್ಧಿ ಪಡಿಸಲು ವಿಶೇಷ ಅನುದಾನ, ಕರ್ನಾಟಕ ಕೊಳಗೇರಿ ಅಭಿವೃದ್ಧಿ ಮಂಡಳಿಯಿಂದ ಸುಮಾರು ೫೦೦ ಮನೆಗಳನ್ನು ನಿರ್ಮಿಸಲು ಮಂಜೂರಾತಿ, ನಗರಸಭೆಗೆ ಆದಾಯ ಬರುವ ದೃಷ್ಟಿಯಿಂದ ಅನಧಿಕೃತ ಕಟ್ಟಡ ಹಾಗು ನಿವೇಶನಗಳನ್ನು ಸಕ್ರಮಗೊಳಿಸುವುದು ಮತ್ತು ಎಂಪಿಎಂ ನಗರಾಡಳಿತ ಇಲಾಖೆ ವ್ಯಾಪ್ತಿಗೆ ಒಳಪಡುವ ಕಾಗದನಗರದ ೪,೫,೬,೮ ಮತ್ತು ಆನೆಕೊಪ್ಪ ಕೊಳಚೆ ಪ್ರದೇಶದಲ್ಲಿನ ಅಂಗಡಿಮುಂಗಟ್ಟುಗಳನ್ನು ಖಾಸಗಿಯವರಿಗೆ ವಹಿಸಿಕೊಡುವ ಬದಲು ನಗರಸಭೆ ಆಡಳಿತಕ್ಕೆ ವಹಿಸಿಕೊಡುವಂತೆ ಆಗ್ರಹಿಸಲಾಗಿದೆ.
     ಕರ್ನಾಟಕ ಆರ್ಯ ವೈಶ್ಯ ಅಭಿವೃದ್ಧಿ ಮಂಡಳಿ ಅಧ್ಯಕ್ಷ ಡಿ.ಎಸ್ ಅರುಣ್ , ಡಿಎಸ್‌ಎಸ್ ಜಿಲ್ಲಾ ಸಂಚಾಲಕ ಏಳುಕೋಟಿ, ತಾಲೂಕು ನಗರ ಸಂಚಾಲಕ ಆರ್. ತಮ್ಮಯ್ಯ, ತಾಲೂಕು ಸಂಘಟನಾ ಸಂಚಾಲಕ ರವಿನಾಯ್ಕ, ಅಣ್ಣಪ್ಪ, ತಾಲೂಕು ಪಂಚಾಯಿತಿ ಸದಸ್ಯ ಕೆ. ಮಂಜುನಾಥ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

ನೂತನ ತಾಲೂಕು ದಂಡಾಧಿಕಾರಿಯಾಗಿ ತಹಸೀಲ್ದಾರ್ ಜಿ. ಸಂತೋಷ್‌ಕುಮಾರ್

ತಹಸೀಲ್ದಾರ್ ಜಿ. ಸಂತೋಷ್‌ಕುಮಾರ್
ಭದ್ರಾವತಿ, ನ. ೧೧: ನೂತನ ತಾಲೂಕು ದಂಡಾಧಿಕಾರಿಯಾಗಿ ತಹಸೀಲ್ದಾರ್ ಜಿ. ಸಂತೋಷ್‌ಕುಮಾರ್ ಅಧಿಕಾರ ವಹಿಸಿಕೊಂಡಿದ್ದಾರೆ.
     ಈ ಹಿಂದೆ ದಾವಣಗೆರೆ ತಾಲೂಕು ದಂಡಾಧಿಕಾರಿಯಾಗಿ ಸೇವೆ ಸಲ್ಲಿಸಿದ್ದು, ನಂತರ ಬೆಂಗಳೂರು ನಗರ ಚುನಾವಣಾ ಶಾಖೆ ತಹಸೀಲ್ದಾರ್ ಹುದ್ದೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದರು. ಇದೀಗ ತಾಲೂಕು ದಂಡಾಧಿಕಾರಿಯಾಗಿ ಅಧಿಕಾರ ವಹಿಸಿಕೊಂಡಿದ್ದಾರೆ. ಜಿ. ಸಂತೋಷ್ ಕುಮಾರ್ ಮೂಲತಃ ಕಂದಾಯ ಇಲಾಖೆಯಲ್ಲಿ ಗ್ರೇಡ್-೧ ಅಧಿಕಾರಿಯಾಗಿ ಹುದ್ದೆಗೆ ಸೇರ್ಪಡೆಗೊಂಡು ಮುಂಬಡ್ತಿ ಹೊಂದಿ ೫ ವರ್ಷಗಳಿಂದ ತಹಸೀಲ್ದಾರ್ ಹುದ್ದೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಈ ಹಿನ್ನಲೆಯಲ್ಲಿ ತಾಲೂಕು ಕಛೇರಿ ಆಡಳಿತಕ್ಕೆ ಸಂಬಂಧಿಸಿದಂತೆ ಹೆಚ್ಚಿನ ಅನುಭವ ಹೊಂದಿದ್ದಾರೆ.
    ಈ ಹಿಂದೆ ವಿಧಾನಸಭೆ ಆಡಳಿತ ವಿಭಾಗದಲ್ಲಿ ತಹಸೀಲ್ದಾರ್ ಆಗಿ ಸೇವೆ ಸಲ್ಲಿಸುತ್ತಿದ್ದ ಎಚ್.ಸಿ ಶಿವಕುಮಾರ್‌ರವರನ್ನು ನಿಯೋಜನೆ ಮೇರೆಗೆ ತಾಲೂಕು ದಂಡಾಧಿಕಾರಿಯಾಗಿ ನೇಮಕಗೊಳಿಸಲಾಗಿತ್ತು. ಲೈಂಗಿಕ ಕಿರುಕುಳ ಪ್ರಕರಣವೊಂದರಲ್ಲಿ ಇವರ ವಿರುದ್ಧ ಹಳೇನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾದ ಹಿನ್ನಲೆಯಲ್ಲಿ ಜಿಲ್ಲಾಧಿಕಾರಿಗಳು ಹುದ್ದೆಯಿಂದ ಬಿಡುಗಡೆಗೊಳಿಸಿದ್ದರು. ತೆರೆವಾದ ಹುದ್ದೆಗೆ ಶಿವಮೊಗ್ಗ ತಹಸೀಲ್ದಾರ್ ಎನ್.ಜೆ ನಾಗರಾಜ್‌ರವರಿಗೆ ಪ್ರಭಾರ ಅಧಿಕಾರ ವಹಿಸಲಾಗಿತ್ತು.

Thursday, November 12, 2020

ಮಹಿಳಾ ಸಮಾಜದಿಂದ ಸಂಸದರಿಗೆ ಸನ್ಮಾನ, ಅಭಿನಂದನೆ

ಭದ್ರಾವತಿ ವಿಧಾನಸಭಾ ಕ್ಷೇತ್ರದಲ್ಲಿ ಸಂಸದರ ನಿಧಿಯಿಂದ ಹಲವಾರು ಅಭಿವೃದ್ಧಿ ಕಾರ್ಯಗಳಿಗೆ ಅನುದಾನ ಬಿಡುಗಡೆಗೊಳಿಸುವಲ್ಲಿ ಯಶಸ್ವಿಯಾಗಿರುವ ಲೋಕಸಭಾ ಸದಸ್ಯ ಬಿ.ವೈ ರಾಘವೇಂದ್ರರನ್ನು ಹಳೇನಗರದ ಮಹಿಳಾ ಸೇವಾ ಸಮಾಜದ ವತಿಯಿಂದ ಸನ್ಮಾನಿಸಿ ಅಭಿನಂದಿಸಲಾಯಿತು.
ಭದ್ರಾವತಿ, ನ. ೧೨: ಕ್ಷೇತ್ರದಲ್ಲಿ ಸಂಸದರ ನಿಧಿಯಿಂದ ಹಲವಾರು ಅಭಿವೃದ್ಧಿ ಕಾರ್ಯಗಳಿಗೆ ಅನುದಾನ ಬಿಡುಗಡೆಗೊಳಿಸುವಲ್ಲಿ ಯಶಸ್ವಿಯಾಗಿರುವ ಲೋಕಸಭಾ ಸದಸ್ಯ ಬಿ.ವೈ ರಾಘವೇಂದ್ರರನ್ನು ಹಳೇನಗರದ ಮಹಿಳಾ ಸೇವಾ ಸಮಾಜದ ವತಿಯಿಂದ ಸನ್ಮಾನಿಸಿ ಅಭಿನಂದಿಸಲಾಯಿತು.
      ಹಳೇನಗರದ ಬಸವೇಶ್ವರ ವೃತ್ತದಲ್ಲಿರುವ ಸಮಾಜದ ಕಟ್ಟಡದ ಮೊದಲ ಹಂತದ ಕಾಮಗಾರಿ ಮುಕ್ತಾಯಗೊಂಡು ಉದ್ಘಾಟನೆಗೆ ಸಿದ್ದಗೊಂಡಿದೆ. ಎರಡನೇ ಹಂತದ ಕಾಮಗಾರಿಗೆ ಸಂಸದರ ನಿಧಿಯಿಂದ ರು.೨೦ ಲಕ್ಷ ಬಿಡುಗಡೆಯಾಗಿದ್ದು, ಈ ಹಿನ್ನಲೆಯಲ್ಲಿ ಸಂಸದರಿಗೆ ಸಮಾಜದ ಪದಾಧಿಕಾರಿಗಳು ಕೃತಜ್ಞತೆ ಸಲ್ಲಿಸಿದರು.
    ಸಮಾಜದ ಅಧ್ಯಕ್ಷೆ ಹೇಮಾವತಿ ವಿಶ್ವನಾಥ್, ಪದಾಧಿಕಾರಿಗಳಾದ ಶೋಭಾ ಗಂಗಾರಾಜ್, ಜಯಂತಿ ನಾಗರಾಜ್, ಕಮಲಕುಮಾರಿ, ಶಕುಂತಲಾ, ಕಮಲರಾಯ್ಕರ್, ಸೂಡ ಅಧ್ಯಕ್ಷ ಎಸ್ ಎಸ್ ಜ್ಯೋತಿ ಪ್ರಕಾಶ್, ಬಿಜೆಪಿ ಅಧ್ಯಕ್ಷ ಎಂ. ಪ್ರಭಾಕರ್ ಸೇರಿದಂತೆ ಇತರರು ಉಪಸ್ಥಿತರಿದ್ದರು.