ಅಭಿವೃದ್ಧಿ ವಿಚಾರದಲ್ಲಿ ಎಂದಿಗೂ ರಾಜಕಾರಣ ಮಾಡಿಲ್ಲ, ಗ್ರಾ.ಪಂ. ಚುನಾವಣೆ ಗೆಲುವು ಖಚಿತ
ಭದ್ರಾವತಿ ಶಾಸಕ ಬಿ.ಕೆ ಸಂಗಮೇಶ್ವರ್ ಬುಧವಾರ ತಮ್ಮ ಗೃಹ ಕಛೇರಿಯಲ್ಲಿ ಹಮ್ಮಿಕೊಳ್ಳಲಾಗಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು.
ಭದ್ರಾವತಿ, ಡಿ. ೧೬: ಗ್ರಾಮ ಪಂಚಾಯ್ತಿಗಳ ಅಭಿವೃದ್ಧಿ ಹಿನ್ನೆಲೆಯಲ್ಲಿ ಸಮರ್ಥ ಅಭ್ಯರ್ಥಿಗಳನ್ನು ಆಯ್ಕೆ ಮಾಡುವಂತೆ ಶಾಸಕ ಬಿ.ಕೆ ಸಂಗಮೇಶ್ವರ್ ಮನವಿ ಮಾಡಿದರು.
ಅವರು ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಕ್ಷೇತ್ರದ ಸರ್ವತೋಮುಖ ಅಭಿವೃದ್ಧಿಯಲ್ಲಿ ಗ್ರಾಮ ಪಂಚಾಯಿತಿಗಳ ಪಾತ್ರ ಬಹಳ ಮುಖ್ಯವಾಗಿದೆ. ನಮ್ಮ ಪಕ್ಷದ ಬೆಂಬಲಿತ ಅಭ್ಯರ್ಥಿಗಳನ್ನು ಆಯ್ಕೆ ಮಾಡಿದ್ದಲ್ಲಿ ಅಭಿವೃದ್ಧಿ ಕಾರ್ಯಗಳನ್ನು ಕೈಗೊಳ್ಳಲು ಹೆಚ್ಚು ಸಹಕಾರಿಯಾಗಲಿದೆ ಎಂದರು.
ನನ್ನ ಅಧಿಕಾರದ ಅವಧಿಯಲ್ಲಿ ಗ್ರಾಮೀಣ ಭಾಗಗಳಲ್ಲಿ ಶೇ.೮೦ರಷ್ಟು ಅಭಿವೃದ್ಧಿ ಕಾರ್ಯಗಳು ನಡೆದಿದ್ದು, ಯಾವುದೇ ರೀತಿಯ ತಾರತಮ್ಯ ಮಾಡಿಲ್ಲ. ಎಲ್ಲಾ ಗ್ರಾಮಗಳನ್ನು ಅಭಿವೃದ್ಧಿ ದೃಷ್ಟಿಯಿಂದ ನೋಡುತ್ತಿದ್ದೇನೆ ಹೊರತು ಅಭಿವೃದ್ಧಿ ವಿಚಾರದಲ್ಲಿ ಎಂದಿಗೂ ರಾಜಕಾರಣ ಮಾಡಿಲ್ಲ. ಈ ಹಿನ್ನಲೆಯಲ್ಲಿ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯ ಎಲ್ಲಾ ಗ್ರಾಮ ಪಂಚಾಯಿತಿಗಳಲ್ಲಿ ನಮ್ಮ ಬೆಂಬಲಿತರು ಅಧಿಕಾರಕ್ಕೆ ಬರುವ ವಿಶ್ವಾಸವಿದೆ. ಅಲ್ಲದೆ ಉತ್ತಮ ವ್ಯಕ್ತಿಗಳನ್ನು ಮಾತ್ರ ನಾವು ಚುನಾವಣೆಗೆ ಸ್ಪರ್ಧಿಸುವಂತೆ ಸೂಚಿಸಿದ್ದೇವೆ. ಈ ಹಿನ್ನಲೆಯಲ್ಲಿ ಗ್ರಾಮೀಣ ಭಾಗದ ಮತದಾರರು ನಮ್ಮ ಬೆಂಬಲಿಗರನ್ನು ಆಯ್ಕೆ ಮಾಡಬೇಕೆಂದು ಮನವಿ ಮಾಡಿದರು.
ಬಿಜೆಪಿ-ಜೆಡಿಎಸ್ ಅಧಿಕಾರಕ್ಕಾಗಿ ಅಡ್ಡ ದಾರಿ ಹಿಡಿಯುವ ಪಕ್ಷಗಳು:
ಬಹುಮತವಿರುವ ಕಡೆ ಅಡ್ಡ ದಾರಿ ಮೂಲಕ ಅಧಿಕಾರ ಹಿಡಿದು ಪ್ರಜಾಪ್ರಭುತ್ವ ವ್ಯವಸ್ಥೆಗೆ ಬಿಜೆಪಿ ಮತ್ತು ಜೆಡಿಎಸ್ ಪಕ್ಷಗಳು ವಿರುದ್ಧವಾಗಿ ವರ್ತಿಸುತ್ತಿವೆ. ಮತದಾರರು ಈ ಎರಡು ಪಕ್ಷಗಳ ಮೇಲಿನ ನಂಬಿಕೆಯನ್ನು ಕಳೆದುಕೊಂಡಿದ್ದಾರೆ. ಈ ದೇಶದಲ್ಲಿ ಎಲ್ಲಾ ಧರ್ಮದ, ಎಲ್ಲಾ ವರ್ಗದ ಜನರ ಹಿತಕಾಪಾಡುವ ಏಕೈಕ ಪಕ್ಷ ಕಾಂಗ್ರೆಸ್ ಎಂಬುದನ್ನು ಯಾರು ಮರೆಯುವಂತಿಲ್ಲ. ೭೦ ವರ್ಷಗಳ ಸುರ್ಧೀಘ ಹಾಗು ಸಮರ್ಥ ಆಡಳಿತ ಪರಿಣಾಮ ಇಂದು ದೇಶದಲ್ಲಿ ಆಡಳಿತ ನಡೆಸುತ್ತಿರುವ ಸರ್ಕಾರಗಳು ಹಾಗು ಜನರು ನೆಮ್ಮದಿಯಿಂದ ಬದುಕಲು ಸಾಧ್ಯವಾಗಿದೆ. ಕಾಂಗ್ರೆಸ್ ಪಕ್ಷ ಅನೇಕ ಕೊಡುಗೆಗಳನ್ನು ದೇಶಕ್ಕೆ ನೀಡಿದೆ. ಆರ್ಥಿಕ, ಶೈಕ್ಷಣಿಕ, ಸಾಮಾಜಿಕ ಸಮಸ್ಯೆಗಳು ಹೆಚ್ಚಾಗಿದ್ದ ಸಂದರ್ಭದಲ್ಲಿ, ಆಧುನಿಕ ತಾಂತ್ರಿಕ ವ್ಯವಸ್ಥೆಗಳಿಲ್ಲದ ಸಂದರ್ಭದಲ್ಲಿ, ಹೆಚ್ಚಿನ ಆದಾಯವಿಲ್ಲದ ಸಂದರ್ಭದಲ್ಲಿ ಹಲವು ಯೋಜನೆಗಳನ್ನು ದೇಶದ ಅಭಿವೃದ್ಧಿಗಾಗಿ ರೂಪಿಸುವಲ್ಲಿ ಕಾಂಗ್ರೆಸ್ ಪಕ್ಷ ಇಂದಿಗೂ ಮಾದರಿಯಾಗಿದೆ. ಈ ಹಿನ್ನಲೆಯಲ್ಲಿ ಗ್ರಾಮೀಣ ಜನರು ಈ ಪಕ್ಷವನ್ನು ಬೆಂಬಲಿಸುತ್ತಾರೆಂಬ ವಿಶ್ವಾಸವಿದೆ ಎಂದರು.
ಬ್ಲಾಕ್ ಕಾಂಗ್ರೆಸ್ ಸಮಿತಿ ನಗರ ಘಟಕದ ಅಧ್ಯಕ್ಷ ಟಿ. ಚಂದ್ರೇಗೌಡ ಮಾತನಾಡಿ, ಈ ಚುನಾವಣೆಯಲ್ಲಿ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಗಳು ಗೆಲ್ಲುವ ವಿಶ್ವಾಸವಿದೆ. ಶಾಸಕರು ಗ್ರಾಮೀಣ ಭಾಗದಲ್ಲಿ ರಸ್ತೆ, ಚರಂಡಿ, ಕುಡಿಯುವ ನೀರು, ಕೆರೆಗಳ ಅಭಿವೃದ್ಧಿ ಸೇರಿದಂತೆ ಹಲವು ಕಾರ್ಯಗಳನ್ನು ಯಶಸ್ವಿಯಾಗಿ ಕೈಗೊಂಡಿದ್ದಾರೆ. ಈ ಹಿನ್ನಲೆಯಲ್ಲಿ ಗ್ರಾಮೀಣ ಜನರು ಬೆಂಬಲಿಸುತ್ತಾರೆಂಬ ನಂಬಿಕೆ ಇದೆ ಎಂದರು.
ನಗರಸಭೆ ಮಾಜಿ ಅಧ್ಯಕ್ಷ ಬಿ.ಕೆ ಮೋಹನ್, ಹಿರಿಯ ಮುಖಂಡ ಗೋವಿಂದಸ್ವಾಮಿ ಮಾತನಾಡಿದರು. ಚನ್ನಪ್ಪ, ದಶರಥಗಿರಿ ಸೇರಿದಂತೆ ಇನ್ನಿತರರಿದ್ದರು.