ಕರ್ನಾಟಕ ಜನಸೈನ ವತಿಯಿಂದ ಭದ್ರಾವತಿ ನಗರಸಭೆ ಮುಂಭಾಗ ಸೋಮವಾರದಿಂದ ಅನಿಧಿಷ್ಟಾವಧಿ ಧರಣಿ ಸತ್ಯಾಗ್ರಹ ನಡೆಸಲಾಗುತ್ತಿದೆ.
ಭದ್ರಾವತಿ, ಜ. ೪: ಸಾರ್ವಜನಿಕರಿಗೆ ತೊಂದರೆಯಾಗುತ್ತಿರುವ ಮದ್ಯದಂಗಡಿಯೊಂದರ ವಿರುದ್ಧ ಕ್ರಮ ಕೈಗೊಳ್ಳುವಲ್ಲಿ ನಿರ್ಲಕ್ಷ್ಯ ಧೋರಣೆ ಅನುಸರಿಸುತ್ತಿರುವುದು, ನಗರದ ಚನ್ನಗಿರಿ ರಸ್ತೆಯಲ್ಲಿ ಅನಧಿಕೃತವಾಗಿ ಬಸ್ ನಿಲ್ದಾಣಗಳನ್ನು ನೆಲಸಮಗೊಳಿಸಿರುವುದು ಹಾಗು ಹಿರೇಕೆರೆ ಜಾಗದಲ್ಲಿ ಸೆಪ್ ಟ್ಯಾಂಕ್ ನಿರ್ಮಾಣ ಮಾಡಿರುವುದನ್ನು ವಿರೋಧಿಸಿ ಕರ್ನಾಟಕ ಜನಸೈನ ವತಿಯಿಂದ ನಗರಸಭೆ ಮುಂಭಾಗ ಸೋಮವಾರದಿಂದ ಅನಿಧಿಷ್ಟಾವಧಿ ಧರಣಿ ಸತ್ಯಾಗ್ರಹ ನಡೆಸಲಾಗುತ್ತಿದೆ.
ಜನ್ನಾಪುರ ಶ್ರೀ ಅಂತರಘಟ್ಟಮ್ಮ ದೇವಸ್ಥಾನದ ಸಮೀಪದಲ್ಲಿರುವ ಶ್ರೀ ಅನ್ನಪೂರ್ಣೇಶ್ವರಿ ವೈನ್ ಸ್ಟೋರ್ ಕಾನೂನು ನಿಯಮಗಳನ್ನು ಉಲ್ಲಂಘಿಸಿ ಮದ್ಯ ಮಾರಾಟದಲ್ಲಿ ತೊಡಗಿದೆ. ಇದರಿಂದಾಗಿ ದೇವಸ್ಥಾನಕ್ಕೆ ಬರುವ ಭಕ್ತಾಧಿಗಳಿಗೆ, ಮುಂಭಾಗದ ರಸ್ತೆಯಲ್ಲಿ ಸಂಚರಿಸುವ ಮಕ್ಕಳು, ಮಹಿಳೆಯರು, ವಿದ್ಯಾರ್ಥಿಗಳು ಸೇರಿದಂತೆ ಸಾರ್ವಜನಿಕರಿಗೆ ಹಾಗೂ ಸುತ್ತಮುತ್ತಲಿನ ನಿವಾಸಿಗಳಿಗೆ ತೊಂದರೆಯಾಗಿದೆ. ಈ ಹಿನ್ನಲೆಯಲ್ಲಿ ಈ ಮದ್ಯದಂಗಡಿಯನ್ನು ಸ್ಥಳಾಂತರಿಸುವಂತೆ ನಿರಂತರವಾಗಿ ಹೋರಾಟ ನಡೆಸಿಕೊಂಡು ಬರಲಾಗುತ್ತಿದೆ. ಮದ್ಯದಂಗಡಿ ಪಕ್ಕದಲ್ಲಿರುವ ಕಟ್ಟಡದಲ್ಲಿ ಯಾವುದೇ ಪರವಾನಗಿ ಇಲ್ಲದೆ ಕುಡಿಯಲು ಅವಕಾಶ ಕಲ್ಪಿಸಿಕೊಡಲಾಗಿದೆ. ಅಲ್ಲದೆ ಅಕ್ರಮವಾಗಿ ನಲ್ಲಿಗಳ ವ್ಯವಸ್ಥೆ ಮಾಡಲಾಗಿದೆ. ಈ ಕಟ್ಟಡ ಮಾಲೀಕರ ವಿರುದ್ಧ ನಗರಸಭೆ ಆಡಳಿತ ಯಾವುದೇ ಸೂಕ್ತ ಕಾನೂನು ಕ್ರಮ ಕೈಗೊಳ್ಳದೆ ರಾಜಕೀಯ ಒತ್ತಡಕ್ಕೆ ಮಣಿದು ಮೌನವಾಗಿದೆ ಎಂದು ಆರೋಪಿಸಲಾಯಿತು.
ಸುಮಾರು ೩೦ ವರ್ಷದಿಂದ ನಗರದ ಚನ್ನಗಿರಿ ರಸ್ತೆಯಲ್ಲಿ ೨ ಬಸ್ ನಿಲ್ದಾಣಗಳಿದ್ದು, ಈ ನಿಲ್ದಾಣಗಳಿಂದ ಸಾರ್ವಜನಿಕರಿಗೆ ಹೆಚ್ಚಿನ ಅನುಕೂಲವಾಗಿದೆ. ಲೋಕೋಪಯೋಗಿ ಇಲಾಖೆಯವರು ರಸ್ತೆ ಅಗಲೀಕರಣ ನೆಪದಲ್ಲಿ ಯಾವುದೇ ಟೆಂಡರ್ ಪ್ರಕ್ರಿಯೆ ನಡೆಸದೆ ಏಕಾಏಕಿ ಈ ಎರಡು ನಿಲ್ದಾಣಗಳನ್ನು ನೆಲಸಮಗೊಳಿಸಿದ್ದಾರೆ. ಈ ಹಿನ್ನಲೆಯಲ್ಲಿ ತಕ್ಷಣ ಬಸ್ ನಿಲ್ದಾಣಗಳನ್ನು ಮರು ನಿರ್ಮಾಣ ಮಾಡಬೇಕು. ತಾಲೂಕಿನ ಹಿರೇಕೆರೆ ಜಾಗದಲ್ಲಿ ಸುಪ್ರೀಂ ಕೋರ್ಟ್ ಆದೇಶ ಉಲ್ಲಂಘಿಸಿ ನಿರ್ಮಿಸಲಾಗಿರುವ ಸೆಪ್ ಟ್ಯಾಂಕ್ ತಕ್ಷಣ ತೆರವುಗೊಳಿಸಬೇಕೆಂದು ಆಗ್ರಹಿಸಲಾಯಿತು.
ಜನಸೈನ್ಯ ಜಿಲ್ಲಾಧ್ಯಕ್ಷ ಕೆ. ಮಂಜುನಾಥ್, ಗೌರವಾಧ್ಯಕ್ಷ ಅನಿಲ್(ಬಾಬು), ಜಿಲ್ಲಾ ಪ್ರಧಾನ ಕಾರ್ಯದರ್ಶಿ ಎಂ. ಅನಂತರಾಮು, ತಾಲೂಕು ಅಧ್ಯಕ್ಷ ಪರಮೇಶ್, ಮಾನವ ಹಕ್ಕುಗಳ ಹೋರಾಟ ಸಮಿತಿ ಅಧ್ಯಕ್ಷ ಬಿ.ಎನ್ ರಾಜು, ಮಹಿಳಾ ಮುಖಂಡರು ಸೇರಿದಂತೆ ಇನ್ನಿತರರು ಪಾಲ್ಗೊಂಡಿದ್ದರು.