ಭದ್ರಾವತಿಯಲ್ಲಿ ತಾಲೂಕು ಮಾಜಿ ಸೈನಿಕರ ಸಂಘದ ವತಿಯಿಂದ ಭಾರತೀಯ ಸೇನಾ ದಿನಾಚರಣೆ ಅಂಗವಾಗಿ ಶುಕ್ರವಾರ ಹೊಸ ಸೇತುವೆ ಸುತ್ತಮುತ್ತ ಸ್ವಚ್ಛತಾ ಕಾರ್ಯದ ಮೂಲಕ ಶ್ರಮದಾನ ನಡೆಸಲಾಯಿತು.
ಭದ್ರಾವತಿ, ಜ. ೧೫: ತಾಲೂಕು ಮಾಜಿ ಸೈನಿಕರ ಸಂಘದ ವತಿಯಿಂದ ಭಾರತೀಯ ಸೇನಾ ದಿನಾಚರಣೆ ಅಂಗವಾಗಿ ಶುಕ್ರವಾರ ಹೊಸ ಸೇತುವೆ ಸುತ್ತಮುತ್ತ ಸ್ವಚ್ಛತಾ ಕಾರ್ಯದ ಮೂಲಕ ಶ್ರಮದಾನ ನಡೆಸಲಾಯಿತು.
ಸಂಘದ ಅಧ್ಯಕ್ಷ ಎಲ್ ಅಶೋಕ್, ನಗರಸಭೆ ಪೌರಾಯುಕ್ತ ಮನೋಹರ್ ನೇತೃತ್ವದಲ್ಲಿ ಖಾಸಗಿ ಬಸ್ ನಿಲ್ದಾಣ, ಇಂದಿರಾ ಕ್ಯಾಂಟೀನ್ ಆವರಣ, ಸೇತುವೆ ಪಕ್ಕದಲ್ಲಿರುವ ಶೌಚಾಲಯದ ಸುತ್ತಮುತ್ತ, ಸೇತುವೆ ಎರಡು ಇಕ್ಕೆಲಗಳಲ್ಲಿ ಹಾಗು ನದಿ ತೀರದಲ್ಲಿ ಸ್ವಚ್ಛತಾ ಕಾರ್ಯ ನಡೆಸುವ ಮೂಲಕ ಮಾಜಿ ಸೈನಿಕರು ಗಮನ ಸೆಳೆದರು.
ಸ್ವಚ್ಛತಾ ಕಾರ್ಯದಲ್ಲಿ ಮಾಜಿ ಸೈನಿಕರ ಪತ್ನಿಯರ ಕ್ಷೇಮಾಭಿವೃದ್ಧಿ ಸಂಘ ಪದಾಧಿಕಾರಿಗಳು, ನಗರಸಭೆ ಪರಿಸರ ಅಭಿಯಂತರ ಪ್ರಭಾಕರ್, ಹಿರಿಯ ಆರೋಗ್ಯ ನಿರೀಕ್ಷಕ ಆರ್.ಬಿ ಸತೀಶ್, ಲತಾ ಮಣಿ, ಸೂಪರ್ ವೈಸರ್ ಗೋವಿಂದ ಸೇರಿದಂತೆ ಇನ್ನಿತರರು ಪಾಲ್ಗೊಂಡಿದ್ದರು. ನಗರಸಭೆ ವತಿಯಿಂದ ಸೇತುವೆ ಎರಡು ಬದಿ ನದಿಗೆ ತ್ಯಾಜ್ಯ ಎಸೆಯುವವರಿಗೆ ದಂಡ ವಿಧಿಸುವ ಹಾಗು ಸಿಸಿ ಕ್ಯಾಮೇರಾ ಅಳವಡಿಸಿರುವ ಬಗ್ಗೆ ಎಚ್ಚರಿಕೆ ಫಲಕ ಅಳವಡಿಸಲಾಯಿತು.
ಈ ಸಂದರ್ಭದಲ್ಲಿ ಮಾತನಾಡಿದ ಸಂಘದ ಕಾರ್ಯದರ್ಶಿ ವೆಂಕಟಗಿರಿ, ಸಾರ್ವಜನಿಕ ಸ್ಥಳಗಳಲ್ಲಿ ಪ್ರತಿಯೊಬ್ಬರು ಸ್ವಚ್ಛತೆ ಕಾಪಾಡಿಕೊಳ್ಳಬೇಕು. ನಮ್ಮ ಮನೆಯನ್ನು ಸ್ವಚ್ಛವಾಗಿಟ್ಟುಕೊಂಡಂತೆ ನಮ್ಮ ಸುತ್ತಮುತ್ತಲಿನ ಪರಿಸರವನ್ನು ಸಹ ಸ್ವಚ್ಛವಾಗಿಟ್ಟುಕೊಳ್ಳಬೇಕು. ಸಂಘದ ವತಿಯಿಂದ ಕೈಗೊಂಡ ಶ್ರಮದಾನ ಸಾರ್ಥಕ ಕಾರ್ಯವಾಗಿದೆ ಪ್ರಶಂಸೆ ವ್ಯಕ್ತಪಡಿಸಿದರು.