Wednesday, February 10, 2021

೮ ಗ್ರಾಮ ಪಂಚಾಯಿತಿಗಳ ಅಧ್ಯಕ್ಷ, ಉಪಾಧ್ಯಕ್ಷರ ಚುನಾವಣೆ : ಎಲ್ಲಾ ಪಂಚಾಯಿತಿಯಲ್ಲೂ ಅವಿರೋಧ ಆಯ್ಕೆ

ಭದ್ರಾವತಿ ತಾಲೂಕಿನ ತಾವರೆಘಟ್ಟ ಗ್ರಾಮ ಪಂಚಾಯಿತಿ ಅಧ್ಯಕ್ಷ ಮತ್ತು ಉಪಾಧ್ಯಕ್ಷ ಎರಡೂ ಸ್ಥಾನಗಳಲ್ಲೂ ಕಾಂಗ್ರೆಸ್ ಬೆಂಬಲಿಗರು ಅಧಿಕಾರ ಹಿಡಿಯುವಲ್ಲಿ ಯಶಸ್ವಿಯಾದ ಹಿನ್ನಲೆಯಲ್ಲಿ ನಗರಸಭೆ ಮಾಜಿ ಅಧ್ಯಕ್ಷ ಬಿ.ಕ ಮೋಹನ್ ನೇತೃತ್ವದಲ್ಲಿ ಸಂಭ್ರಮಾಚರಣೆ ನಡೆಸಲಾಯಿತು.
   ಭದ್ರಾವತಿ, ಫೆ. ೧೦:   ತಾಲೂಕಿನ ಮಂಗೋಟೆ, ಯಡೇಹಳ್ಳಿ, ಮಾರಶೆಟ್ಟಿಹಳ್ಳಿ, ದೊಣಬಘಟ್ಟ, ಮಾವಿನಕೆರೆ, ಬಾರಂದೂರು, ತಾವರಘಟ್ಟ ಮತ್ತು ಅರಕೆರೆ ಸೇರಿದಂತೆ ಒಟ್ಟು ೮ ಗ್ರಾಮ ಪಂಚಾಯಿತಿಗಳಿಗೆ ಬುಧವಾರ ಅಧ್ಯಕ್ಷ ಮತ್ತು ಉಪಾಧ್ಯಕ್ಷ ಸ್ಥಾನಗಳಿಗೆ ಚುನಾವಣೆ ನಡೆದಿದ್ದು, ೨ ಪಂಚಾಯಿತಿ ಬಿಜೆಪಿ, ೧ ಪಂಚಾಯಿತಿ ಕಾಂಗ್ರೆಸ್, ೨ ಪಂಚಾಯಿತಿ ಶಾಸಕ ಬಿ.ಕೆ ಸಂಗಮೇಶ್ವರ್ ಮತ್ತು ಜಿ.ಪಂ. ಮಾಜಿ ಸದಸ್ಯ ಎಸ್. ಕುಮಾರ್ ಬೆಂಬಲಿಗರು ಹಾಗು ೧ ಪಂಚಾಯಿತಿ ಜೆಡಿಎಸ್ ಬೆಂಬಲಿಗರ ಪಾಲಾಗಿವೆ.  
    ದೊಣಬಘಟ್ಟ ಪಂಚಾಯಿತಿಯಲ್ಲಿ ಒಟ್ಟು ೨೧ ಸದಸ್ಯರಿದ್ದು,  'ಎ' ವರ್ಗಕ್ಕೆ ಮೀಸಲಾದ ಅಧ್ಯಕ್ಷ ಸ್ಥಾನಕ್ಕೆ ಖಲೀಲ್ ಸಾಬ್ ಮತ್ತು ಪರಿಶಿಷ್ಟ ಜಾತಿ ಮಹಿಳೆಗೆ ಮೀಸಲಾದ ಉಪಾಧ್ಯಕ್ಷ ಸ್ಥಾನಕ್ಕೆ ಹಾಲಮ್ಮ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ತಾಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಕೆ.ಜೆ ತಮ್ಮಣ್ಣಗೌಡ ಚುನಾವಣಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸಿದರು. ಅಧ್ಯಕ್ಷ ಮತ್ತು ಉಪಾಧ್ಯಕ್ಷ ಎರಡು ಸ್ಥಾನಗಳು ಜೆಡಿಎಸ್ ಬೆಂಬಲಿಗರ ಪಾಲಾಗಿವೆ.
    ಬಾರಂದೂರು ಗ್ರಾಮ ಪಂಚಾಯಿತಿಯಲ್ಲಿ ಒಟ್ಟು ೧೧ ಸದಸ್ಯರಿದ್ದು, 'ಬಿ' ವರ್ಗ ಮಹಿಳೆಗೆ ಮೀಸಲಾದ ಅಧ್ಯಕ್ಷ ಸ್ಥಾನಕ್ಕೆ ನೀಲಮ್ಮ ಮತ್ತು 'ಎ' ವರ್ಗ ಮಹಿಳೆಗೆ ಮೀಸಲಾದ ಉಪಾಧ್ಯಕ್ಷ ಸ್ಥಾನಕ್ಕೆ ಸುಮಾ .ಎಸ್ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ತಾಲೂಕು ಪಂಚಾಯಿತಿ ಅಕ್ಷರ ದಾಸೋಹ ಸಹಾಯಕ ನಿರ್ದೇಶಕ ಬಿ. ನಟರಾಜ್ ಚುನಾವಣಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸಿದರು. ಈ ಪಂಚಾಯಿತಿಯಲ್ಲಿ ಶಾಸಕ ಬಿ.ಕೆ ಸಂಗಮೇಶ್ವರ್ ಮತ್ತು ಜಿ.ಪಂ. ಮಾಜಿ ಸದಸ್ಯ ಎಸ್. ಕುಮಾರ್ ಬೆಂಬಲಿಗರು ಅಧಿಕಾರ ಹಿಡಿಯುವಲ್ಲಿ ಯಶಸ್ವಿಯಾಗಿದ್ದಾರೆ.
    ತಾವರಘಟ್ಟ ಗ್ರಾಮ ಪಂಚಾಯಿತಿಯಲ್ಲಿ ಒಟ್ಟು ೧೪ ಜನ ಸದಸ್ಯರಿದ್ದು,  ಸಾಮಾನ್ಯ ವರ್ಗಕ್ಕೆ ಮೀಸಲಾದ ಅಧ್ಯಕ್ಷ ಸ್ಥಾನಕ್ಕೆ ಜಿ.ಎಸ್ ಮಹೇಶ್ವರಪ್ಪ ಮತ್ತು ಸಾಮಾನ್ಯ ಮಹಿಳೆಗೆ ಮೀಸಲಾದ ಉಪಾಧ್ಯಕ್ಷ ಸ್ಥಾನಕ್ಕೆ ಲತಾ ಅಡವಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಪಶು ಇಲಾಖೆ ಸಹಾಯಕ ನಿರ್ದೇಶಕ ಡಾ.ಕೆ. ಬಸವರಾಜ್ ಚುನಾವಣಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸಿದರು. ಈ ಪಂಚಾಯಿತಿಯ ಅಧ್ಯಕ್ಷ ಮತ್ತು ಉಪಾಧ್ಯಕ್ಷ ಎರಡೂ ಸ್ಥಾನಗಳಲ್ಲೂ ಕಾಂಗ್ರೆಸ್ ಬೆಂಬಲಿಗರು ಅಧಿಕಾರ ಹಿಡಿಯುವಲ್ಲಿ ಯಶಸ್ವಿಯಾಗಿದ್ದಾರೆ.
    ಮಂಗೋಟೆ ಗ್ರಾಮ ಪಂಚಾಯಿತಿಯಲ್ಲಿ ಒಟ್ಟು ೯ ಸದಸ್ಯರಿದ್ದು, ಸಾಮಾನ್ಯ ಮಹಿಳೆಗೆ ಮೀಸಲಾದ ಅಧ್ಯಕ್ಷ ಸ್ಥಾನಕ್ಕೆ ದ್ರಾಕ್ಷಾಯಿಣಿ .ಜಿ ಮತ್ತು ಪರಿಶಿಷ್ಟ ಜಾತಿಗೆ ಮೀಸಲಾದ ಉಪಾಧ್ಯಕ್ಷ ಸ್ಥಾನಕ್ಕೆ ಎ.ಕೆ ನಾಗರಾಜ್ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ತಾಲೂಕು ಪಂಚಾಯಿತಿ ಸಹಾಯಕ ನಿರ್ದೇಶಕ ಚೇತನ್ ಚುನಾವಣಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸಿದರು. ಈ ಪಂಚಾಯಿತಿಯಲ್ಲಿ ಅಧ್ಯಕ್ಷ ಮತ್ತು ಉಪಾಧ್ಯಕ್ಷ ಎರಡು ಸ್ಥಾನಗಳು ಬಿಜೆಪಿ ಬೆಂಬಲಿಗರ ಪಾಲಾಗಿವೆ.
     ತಾಲೂಕಿನ ಯಡೇಹಳ್ಳಿ ಗ್ರಾಮ ಪಂಚಾಯಿತಿಯಲ್ಲಿ ಒಟ್ಟು ೧೪ ಸದಸ್ಯರಿದ್ದು,  ಸಾಮಾನ್ಯ ವರ್ಗಕ್ಕೆ ಮೀಸಲಾದ ಅಧ್ಯಕ್ಷ ಸ್ಥಾನಕ್ಕೆ ಪಿ. ಮಂಜುನಾಥ್ ಮತ್ತು ಸಾಮಾನ್ಯ ಮಹಿಳೆಗೆ ಮೀಸಲಾದ ಉಪಾಧ್ಯಕ್ಷ ಸ್ಥಾನಕ್ಕೆ ಸಿ. ವಿಜಯಲಕ್ಷ್ಮಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಕೃಷಿ ಇಲಾಖೆ ಸಹಾಯಕ ನಿರ್ದೇಶಕ ಬಿ.ಸಿ ಶಶಿಧರ ಚುನಾವಣಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸಿದರು. ಈ ಪಂಚಾಯಿತಿಯಲ್ಲೂ ಅಧ್ಯಕ್ಷ ಮತ್ತು ಉಪಾಧ್ಯಕ್ಷ ಎರಡು ಸ್ಥಾನಗಳೂ ಬಿಜೆಪಿ ಬೆಂಬಲಿಗರ ಪಾಲಾಗಿವೆ.  
    ಮಾರಶೆಟ್ಟಿಹಳ್ಳಿ ಗ್ರಾಮ ಪಂಚಾಯಿತಿಯಲ್ಲಿ ಒಟ್ಟು ೧೪ ಸದಸ್ಯರಿದ್ದು, 'ಎ' ವರ್ಗ ಮಹಿಳೆಗೆ ಮೀಸಲಾದ ಅಧ್ಯಕ್ಷ ಸ್ಥಾನಕ್ಕೆ ಲಲಿತಮ್ಮ ಹೊನ್ನಪ್ಪ ಎಚ್. ಹಾಗು ಸಾಮಾನ್ಯ ವರ್ಗಕ್ಕೆ ಮೀಸಲಾದ ಉಪಾಧ್ಯಕ್ಷ ಸ್ಥಾನಕ್ಕೆ ಕಿರಣ್ ಮೋರೆ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಮೀನುಗಾರಿಕೆ ಇಲಾಖೆ ಸಹಾಯಕ ನಿರ್ದೇಶಕ ಗಣೇಶ್‌ರಾಜ್ ಚುನಾವಣಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸಿದರು. ಈ ಪಂಚಾಯಿತಿಯಲ್ಲಿ ಅಧ್ಯಕ್ಷ ಸ್ಥಾನ ಬಿಜೆಪಿ ಬೆಂಬಲಿಗರು ಮತ್ತು ಉಪಾಧ್ಯಕ್ಷ ಸ್ಥಾನ ಕಾಂಗ್ರೆಸ್ ಬೆಂಬಲಿಗರು ತಮ್ಮದಾಗಿಸಿಕೊಂಡಿದ್ದಾರೆ.
    ತಾಲೂಕಿನ ಮಾವಿನಕೆರೆ ಗ್ರಾಮ ಪಂಚಾಯಿತಿಯಲ್ಲಿ ಒಟ್ಟು ೧೦ ಸದಸ್ಯರಿದ್ದು, ಸಾಮಾನ್ಯ ವರ್ಗಕ್ಕೆ ಮೀಸಲಾದ ಅಧ್ಯಕ್ಷ ಸ್ಥಾನಕ್ಕೆ ಶ್ರೀಧರ ಶೆಟ್ಟಿ ಮತ್ತು 'ಎ' ವರ್ಗ ಮಹಿಳೆಗೆ ಮೀಸಲಾದ ಉಪಾಧ್ಯಕ್ಷ ಸ್ಥಾನಕ್ಕೆ ನೇತ್ರಾವತಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ತೋಟಗಾರಿಕೆ ಇಲಾಖೆ ಹಿರಿಯ ಸಹಾಯಕ ನಿರ್ದೇಶಕ ಕಾಂತರಾಜ್ ಚುನಾವಣಾಧಿಕಾರಿ ಕರ್ತವ್ಯ ನಿರ್ವಹಿಸಿದರು. ಈ ಪಂಚಾಯಿತಿಯಲ್ಲಿ ಶಾಸಕ ಬಿ.ಕೆ ಸಂಗಮೇಶ್ವರ್ ಮತ್ತು ಜಿ.ಪಂ. ಮಾಜಿ ಸದಸ್ಯ ಎಸ್. ಕುಮಾರ್ ಬೆಂಬಲಿಗರು ಅಧಿಕಾರ ಹಿಡಿಯುವಲ್ಲಿ ಯಶಸ್ವಿಯಾಗಿದ್ದಾರೆ.
ಅರಕೆರೆ ಗ್ರಾಮ ಪಂಚಾಯಿತಿಯಲ್ಲಿ ಒಟ್ಟು ೧೨ ಸದಸ್ಯರಿದ್ದು, 'ಎ' ವರ್ಗಕ್ಕೆ ಮೀಸಲಾದ ಅಧ್ಯಕ್ಷ ಸ್ಥಾನಕ್ಕೆ ಆರ್.ಡಿ ಶೇಖರಪ್ಪ ಮತ್ತು ಸಾಮಾನ್ಯ ಮಹಿಳೆಗೆ ಮೀಸಲಾದ ಉಪಾಧ್ಯಕ್ಷ ಸ್ಥಾನಕ್ಕೆ ಗಾಯಿತ್ರಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಮೀನುಗಾರಿಕೆ ಇಲಾಖೆ ಸಹಾಯಕ ನಿರ್ದೇಶಕ ಗಣೇಶ್‌ರಾಜ್ ಚುನಾವಣಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸಿದರು.

ರೋಟರಿ ಕ್ಲಬ್ ವತಿಯಿಂದ ಎಸ್‌ಎಸ್‌ಎಲ್‌ಸಿ ಮಕ್ಕಳಿಗೆ ಉಚಿತ ೨೦ ಟ್ಯಾಪ್ ವಿತರಣೆ

ಭದ್ರಾವತಿ ತಾಲೂಕಿನ ಕೂಡ್ಲಿಗೆರೆ ಗ್ರಾಮದ ಶ್ರೀ ಹರಿಹರೇಶ್ವರ ಪ್ರೌಢಶಾಲೆ ೧೦ನೇ ತರಗತಿ ಮಕ್ಕಳಿಗೆ ರೋಟರಿ ಕ್ಲಬ್ ವತಿಯಿಂದ ಉಚಿತವಾಗಿ ೨೦ ಟ್ಯಾಪ್‌ಗಳನ್ನು ಬುಧವಾರ ವಿತರಿಸಲಾಯಿತು.
    ಭದ್ರಾವತಿ, ಫೆ. ೧೦: ತಾಲೂಕಿನ ಕೂಡ್ಲಿಗೆರೆ ಗ್ರಾಮದ ಶ್ರೀ ಹರಿಹರೇಶ್ವರ ಪ್ರೌಢಶಾಲೆ ೧೦ನೇ ತರಗತಿ ಮಕ್ಕಳಿಗೆ ರೋಟರಿ ಕ್ಲಬ್ ವತಿಯಿಂದ ಉಚಿತವಾಗಿ ೨೦ ಟ್ಯಾಪ್‌ಗಳನ್ನು ಬುಧವಾರ ವಿತರಿಸಲಾಯಿತು.
ಶಾಲೆಯಲ್ಲಿ ಒಟ್ಟು ೪೦ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳಿದ್ದು, ತಲಾ ಇಬ್ಬರು ವಿದ್ಯಾರ್ಥಿಗಳಿಗೆ ಒಂದೊಂದು ಟ್ಯಾಪ್‌ಗಳಂತೆ ಒಟ್ಟು ೨೦ ಟ್ಯಾಪ್‌ಗಳನ್ನು ವಿತರಿಸುವ ಮೂಲಕ ಶಿಕ್ಷಣದಲ್ಲಿ ಪ್ರಗತಿ ಸಾಧಿಸುವಂತೆ ಕರೆ ನೀಡಲಾಯಿತು.
     ಕಾರ್ಯಕ್ರಮವನ್ನು ಹಟ್ಟಿ ಚಿನ್ನದ ಗಣಿ ನಿರ್ದೇಶಕ ಕೂಡ್ಲಿಗೆರೆ ಹಾಲೇಶ್ ಉದ್ಘಾಟಿಸಿದರು. ರೋಟರಿ ಕ್ಲಬ್ ಅಧ್ಯಕ್ಷ ಬಿ.ಎಂ ಶಾಂತಕುಮಾರ್ ಅಧ್ಯಕ್ಷತೆ ವಹಿಸಿದ್ದರು. ಕ್ಷೇತ್ರ ಶಿಕ್ಷಣಾಧಿಕಾರಿ ಟಿ.ಎನ್ ಸೋಮಶೇಖರಯ್ಯ, ರೋಟರಿ ಕ್ಲಬ್ ಅಸಿಸ್ಟೆಂಟ್ ಗವರ್ನರ್ ಎನ್.ಎಸ್ ಶ್ರೀಧರ್, ಡಿಎಲ್‌ಸಿಸಿ ಎಚ್.ಎಲ್ ರವಿ, ಜೋನಲ್ ಲೆಫ್ಟಿನೆಂಟ್ ಡಾ. ಕೆ. ನಾಗರಾಜ್, ಜೋನಲ್ ಟ್ರೈನರ್ ಜಿ. ವಿಜಯಕುಮಾರ್, ಶಿವಮೊಗ್ಗ ರೋಟರಿ ಕ್ಲಬ್ ಅಧ್ಯಕ್ಷ ಎಚ್.ಎಸ್ ಮೋಹನ್, ರವೀಂದ್ರನಾಥ ಐತಾಳ್, ಪ್ರಮುಖರಾದ ಸುಂದರ್‌ಬಾಬು, ಅಡವೀಶಯ್ಯ, ರಾಘವೇಂದ್ರ ಉಪಾಧ್ಯಾಯ, ಕಾರ್ಯದರ್ಶಿ ಎಂ.ಎನ್ ಗಿರೀಶ್, ಶಾಲೆಯ ಮುಖ್ಯೋಪಾಧ್ಯಾಯ ಸಿ. ಹರೀಶ್‌ಬಾಬು ಸೇರಿದಂತೆ ಗ್ರಾಮದ ಪ್ರಮುಖರು, ಶಿಕ್ಷಕ ಹಾಗು ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.


Tuesday, February 9, 2021

ಸಮಾಜ ಸೇವಕ ರೋಸಯ್ಯ ನೆನಪಿನಲ್ಲಿ ನಿರಾಶ್ರಿತರಿಗೆ ಕ್ಷೌರ

ಮಾನವೀಯ ನೆಲೆಗಟ್ಟಿನಲ್ಲಿ ಸ್ಪಂದಿಸಿದ ವಿವಿಧ ಸಂಘಟನೆಗಳು

ಭದ್ರಾವತಿ ನ್ಯೂಟೌನ್ ತಮಿಳು ಸರ್ಕಾರಿ ಶಾಲೆ ಹಿಂಭಾಗದ ಖಾಲಿ ಜಾಗದಲ್ಲಿ ಮಂಗಳವಾರ ಸಮಾಜ ಸೇವಕ ರೋಸಯ್ಯನವರ ಸ್ಮರಣಾರ್ಥ ನಿರಾಶ್ರಿತರಿಗೆ ಉಚಿತ ಕ್ಷೌರ ಕೈಗೊಳ್ಳವ ಮೂಲಕ ಸೇವಾ ಕಾರ್ಯ ನಡೆಸಲಾಯಿತು.
    ಭದ್ರಾವತಿ, ಫೆ. ೯: ನಿರಾಶ್ರಿತರನ್ನು ಸಮಾಜದಲ್ಲಿ ಕಾಣುವ ರೀತಿ ಎಲ್ಲರಿಗೂ ತಿಳಿದಿದೆ. ಬಹಳಷ್ಟು ಮಂದಿ ನಮಗೂ ಅವರಿಗೂ ಯಾವುದೇ ಸಂಬಂಧವಿಲ್ಲದಂತೆ ನಡೆದುಕೊಳ್ಳುತ್ತಾರೆ. ಅಪರೂಪಕ್ಕೆ ಕೆಲವರು ಮಾನವೀಯ ನೆಲೆಗಟ್ಟಿನಲ್ಲಿ ಅವರ ಬೆಂಬಲಕ್ಕೆ ನಿಲ್ಲುತ್ತಾರೆ. ಇಂತಹ ವ್ಯಕ್ತಿಗಳಲ್ಲಿ ದಿವಂಗತ ರೋಸಯ್ಯ ಸಹ ಒಬ್ಬರಾಗಿದ್ದರು. ಇವರ ನಿಧನದ ನಂತರ ಇವರ ಪುತ್ರ ಆರ್. ಮೋಸಸ್ ತಂದೆಯ ಸೇವಾ ಕಾರ್ಯವನ್ನು ಮುನ್ನಡೆಸಿಕೊಂಡು ಬರುತ್ತಿದ್ದಾರೆ.
    ರೋಸಯ್ಯನವರು ತಾವು ದುಡಿದ ಸ್ವಲ್ಪ ಭಾಗವನ್ನು ನಿರಾಶ್ರಿತರ ಸೇವೆಗಾಗಿ ಮೀಸಲಿಟ್ಟಿದ್ದರು. ಪ್ರತಿದಿನ ನಿರಾಶ್ರಿತರಿಗೆ ಊಟದ ವ್ಯವಸ್ಥೆ ಕೈಗೊಳ್ಳುತ್ತಿದ್ದರು. ಇದೀಗ ಅವರ ಸೇವಾ ಕಾರ್ಯದೊಂದಿಗೆ ಅವರ ನೆನಪು ಶಾಶ್ವತವಾಗಿ ಉಳಿದುಕೊಂಡಿದೆ. ಮೋಸಸ್‌ರವರು ತಂದೆ ಕೈಗೊಳ್ಳುತ್ತಿದ್ದ ಸೇವಾ ಕಾರ್ಯಕ್ಕೆ ಇದೀಗ ಮತ್ತೊಂದು ಸೇವೆಯನ್ನು ಸೇರ್ಪಡೆಮಾಡಿದ್ದಾರೆ. ನಿರಾಶ್ರಿತರಿಗೆ ಉಚಿತ ಕ್ಷೌರ ವ್ಯವಸ್ಥೆ ಕಲ್ಪಿಸುವ ಮೂಲಕ ಅವರ ವೈಯಕ್ತಿಕ ಶುಚಿತ್ವದ ಬಗ್ಗೆ ಕಾಳಜಿವಹಿಸಿದ್ದಾರೆ. ಇವರ ಕಾರ್ಯಕ್ಕೆ ಪೊಲೀಸ್ ಉಮೇಶ್ ನೇತೃತ್ವದ ಸ್ನೇಹ ಜೀವಿ ಬಳಗ ಹಾಗು ನಗರದ ಸವಿತ ಸಮಾಜ ಸಹ ಕೈಜೋಡಿಸಿದೆ.
     ಮಂಗಳವಾರ ನ್ಯೂಟೌನ್ ತಮಿಳು ಸರ್ಕಾರಿ ಶಾಲೆ ಹಿಂಭಾಗದ ಖಾಲಿ ಜಾಗದಲ್ಲಿ ರೋಸಯ್ಯನವರ ಸ್ಮರಣಾರ್ಥ ನಿರಾಶ್ರಿತರಿಗೆ ಉಚಿತ ಕ್ಷೌರ ಕೈಗೊಳ್ಳವ ಮೂಲಕ ಸೇವಾ ಕಾರ್ಯ ನಡೆಸಲಾಯಿತು.
ಈ ಕಾರ್ಯಕ್ಕೆ ಕ್ರೈಸ್ತ ಧರ್ಮಗುರುಗಳು, ಪೊಲೀಸ್ ಉಮೇಶ್, ಸತೀಶ್‌ಗೌಡ, ಸವಿತ ಸಮಾಜದ ಅಧ್ಯಕ್ಷರು, ಪದಾಧಿಕಾರಿಗಳು ಹಾಗು ದಯಾಸಾಗರ್ ಟ್ರಸ್ಟ್‌ನ ಪ್ರಮುಖರು ಸೇರಿದಂತೆ ಇನ್ನಿತರರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.



೪ ಗ್ರಾಮ ಪಂಚಾಯಿತಿಗಳಿಗೆ ಅಧ್ಯಕ್ಷ, ಉಪಾಧ್ಯಕ್ಷರು ಅವಿರೋಧ ಆಯ್ಕೆ

ಶಾಸಕ ಬಿ.ಕೆ ಸಂಗಮೇಶ್ವರ್, ಜಿ.ಪಂ. ಮಾಜಿ ಸದಸ್ಯ ಎಸ್. ಕುಮಾರ್ ಬೆಂಬಲಿಗರಿಗೆ ಅಧಿಕಾರ

ಭದ್ರಾವತಿ ಹಿರಿಯೂರು ಗ್ರಾಮ ಪಂಚಾಯಿತಿ ಅಧ್ಯಕ್ಷ, ಉಪಾಧ್ಯಕ್ಷ ಸ್ಥಾನಗಳಿಗೆ ನಡೆದ ಚುನಾವಣೆಯಲ್ಲಿ ಅವಿರೋಧವಾಗಿ ಅಯ್ಕೆಯಾದ ನೂತನ ಅಧ್ಯಕ್ಷರು, ಉಪಾಧ್ಯಕ್ಷರೊಂದಿಗೆ ಕಾಂಗ್ರೆಸ್ ಹಾಗು ಜೆಡಿಎಸ್ ಬೆಂಬಲಿಗರು ಸಂಭ್ರಮಾಚರಣೆ ನಡೆಸಿದರು.

   ಭದ್ರಾವತಿ, ಫೆ. ೯: ತಾಲೂಕಿನ ೪ ಗ್ರಾಮ ಪಂಚಾಯಿತಿಗಳಿಗೆ ಮಂಗಳವಾರ ಚುನಾವಣೆ ನಡೆದಿದ್ದು, ಬಹುತೇಕ ಕಡೆ  ಅವಿರೋಧ ಆಯ್ಕೆ ನಡೆಯಿತು.
    ಹಿರಿಯೂರು ಗ್ರಾಮ ಪಂಚಾಯಿತಿ ಪರಿಶಿಷ್ಟ ಪಂಗಡ ಮಹಿಳೆಗೆ ಮೀಸಲಾದ ಅಧ್ಯಕ್ಷ ಸ್ಥಾನಕ್ಕೆ ಜಿ.ಜಿ ಗಂಗಮ್ಮ ಅವಿರೋಧವಾಗಿ ಆಯ್ಕೆಯಾಗಿದ್ದು, ಇವರು ಈ ಪಂಚಾಯಿತಿಯಲ್ಲಿ ಪರಿಶಿಷ್ಟ ಪಂಗಡಕ್ಕೆ ಸೇರಿದ ಏಕೈಕ ಸದಸ್ಯೆಯಾಗಿದ್ದಾರೆ. ಉಳಿದಂತೆ ಸಾಮಾನ್ಯ ವರ್ಗಕ್ಕೆ ಮೀಸಲಾದ ಉಪಾಧ್ಯಕ್ಷ ಸ್ಥಾನಕ್ಕೆ ಇಬ್ಬರು ನಾಮಪತ್ರ ಸಲ್ಲಿಸಿದ್ದು, ಒಬ್ಬರ ನಾಮಪತ್ರ ತಿರಸ್ಕೃತಗೊಂಡ ಹಿನ್ನಲೆಯಲ್ಲಿ ಪವಿತ್ರ ಜಿ. ಮಂಜುನಾಥ್ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ೨ನೇ ಬಾರಿಗೆ ಪಂಚಾಯಿತಿಗೆ ಆಯ್ಕೆಯಾಗಿರುವ ಇವರು ಮೊದಲ ಅವಧಿಯಲ್ಲಿಯೇ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದಾರೆ. ಕಾಂಗ್ರೆಸ್ ಮತ್ತು ಜೆಡಿಎಸ್ ಬೆಂಬಲಿಗರು ಅಧಿಕಾರ ಹಿಡಿಯುವಲ್ಲಿ ಯಶಸ್ವಿಯಾಗಿದ್ದಾರೆ. ಪಶು ಇಲಾಖೆ ಸಹಾಯಕ ನಿರ್ದೇಶಕ ಡಾ. ಕೆ. ಬಸವರಾಜ್ ಚುನಾವಣಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸಿದರು.
   ಕಲ್ಲಹಳ್ಳಿ ಗ್ರಾಮ ಪಂಚಾಯಿತಿ ಹಿಂದುಳಿದ 'ಎ' ವರ್ಗಕ್ಕೆ ಮೀಸಲಾದ ಅಧ್ಯಕ್ಷ ಸ್ಥಾನಕ್ಕೆ ಮಂಜುಳ ಹಾಗು ಸಾಮಾನ್ಯ ವರ್ಗಕ್ಕೆ ಮೀಸಲಾದ ಉಪಾಧ್ಯಕ್ಷ ಸ್ಥಾನಕ್ಕೆ ಬಿ. ಆನಂದ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಕ್ಷೇತ್ರ ಶಿಕ್ಷಣಾಧಿಕಾರಿ ಟಿ.ಎನ್ ಸೋಮಶೇಖರಯ್ಯ ಚುನಾವಣಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸಿದರು.
   ಅರಳಿಕೊಪ್ಪ ಗ್ರಾಮ ಪಂಚಾಯಿತಿ ಸಾಮಾನ್ಯ ವರ್ಗಕ್ಕೆ ಮೀಸಲಾದ ಅಧ್ಯಕ್ಷ ಸ್ಥಾನಕ್ಕೆ ಉತ್ತರೇಶ್ .ಎಸ್ ಹಾಗು ಸಾಮಾನ್ಯ ಮಹಿಳೆಗೆ ಮೀಸಲಾದ ಉಪಾಧ್ಯಕ್ಷ ಸ್ಥಾನಕ್ಕೆ ಲಕ್ಷ್ಮೀ ಬಾಯಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ತಾಲೂಕು ಪಂಚಾಯಿತಿ ಅಧ್ಯಕ್ಷ ದಾಸೋಹ ಸಹಾಯಕ ನಿರ್ದೇಶಕ ಬಿ. ನಟರಾಜ್ ಚುನಾವಣಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸಿದರು. ಶಾಸಕ ಬಿ.ಕೆ ಸಂಗಮೇಶ್ವರ್ ಹಾಗು ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಎಸ್. ಕುಮಾರ್ ಬೆಂಬಲಿಗರು ಅಧಿಕಾರ ಹಿಡಿಯುವಲ್ಲಿ ಯಶಸ್ವಿಯಾಗಿದ್ದಾರೆ.
    ಅತ್ತಿಗುಂದ ಗ್ರಾಮ ಪಂಚಾಯಿತಿ ಪರಿಶಿಷ್ಟ ಜಾತಿ ಮಹಿಳೆಗೆ ಮೀಸಲಾದ ಅಧ್ಯಕ್ಷ ಸ್ಥಾನಕ್ಕೆ ರತ್ನಮ್ಮ ಹಾಗು ಹಿಂದುಳಿದ 'ಎ' ವರ್ಗಕ್ಕೆ ಮೀಸಲಾದ ಉಪಾಧ್ಯಕ್ಷ ಸ್ಥಾನಕ್ಕೆ ಮೊಹ್ಸಿನಾ ಬಾನು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ತಾಲೂಕು ಪಂಚಾಯಿತಿ ಕಾರ್ಯ ನಿರ್ವಹಣಾಧಿಕಾರಿ ಕೆ.ಜೆ ತಮ್ಮಣ್ಣಗೌಡ ಚುನಾವಣಾಧಿಕಾರಿಯಾರಿ ಕರ್ತವ್ಯ ನಿರ್ವಹಿಸಿದರು. ಕಾಂಗ್ರೆಸ್ ಬೆಂಬಲಿಗರು ಅಧಿಕಾರ ಹಿಡಿಯುವಲ್ಲಿ ಯಶಸ್ವಿಯಾಗಿದ್ದಾರೆ.

ನೀರಾವರಿ ನಿಗಮದ ಕೆರೆಗಳನ್ನು ನಗರಸಭೆಗೆ ಹಸ್ತಾಂತರಿಸಿ : ಭಾರತರತ್ನ ಸರ್.ಎಂ. ವಿಶ್ವೇಶ್ವರಯ್ಯ ಚಾರಿಟಬಲ್ ಟ್ರಸ್ಟ್ ಮನವಿ

ಭದ್ರಾವತಿ ನಗರಸಭೆ ವ್ಯಾಪ್ತಿಯಲ್ಲಿರುವ ಕೆರೆಗಳನ್ನು ಅಭಿವೃದ್ಧಿ ಪಡಿಸುವ ಹಿನ್ನಲೆಯಲ್ಲಿ ನಗರಸಭೆಗೆ ಕೆರೆಗಳನ್ನು ಹಸ್ತಾಂತರಿಸುವಂತೆ ಒತ್ತಾಯಿಸಿ ಭಾರತರತ್ನ ಸರ್.ಎಂ. ವಿಶ್ವೇಶ್ವರಯ್ಯ ಚಾರಿಟಬಲ್ ಟ್ರಸ್ಟ್ ವತಿಯಿಂದ ಕರ್ನಾಟಕ ನೀರಾವರಿ ನಿಗಮ ನಿಯಮಿತ ನಂ.೩ ಬಿ.ಆರ್.ಎಲ್.ಬಿ.ಸಿ ವಿಭಾಗದ ಸಹಾಯಕ ಕಾರ್ಯಪಾಲಕ ಅಭಿಯಂತರ ಆರ್.ಬಿ ಮಂಜುನಾಥ್‌ಗೆ ಮಂಗಳವಾರ ಮನವಿ ಸಲ್ಲಿಸಲಾಯಿತು.
   ಭದ್ರಾವತಿ, ಫೆ. ೯: ನಗರಸಭೆ ವ್ಯಾಪ್ತಿಯಲ್ಲಿರುವ ಕೆರೆಗಳನ್ನು ಅಭಿವೃದ್ಧಿ ಪಡಿಸುವ ಹಿನ್ನಲೆಯಲ್ಲಿ ನಗರಸಭೆಗೆ ಕೆರೆಗಳನ್ನು ಹಸ್ತಾಂತರಿಸುವಂತೆ ಒತ್ತಾಯಿಸಿ ಭಾರತರತ್ನ ಸರ್.ಎಂ. ವಿಶ್ವೇಶ್ವರಯ್ಯ ಚಾರಿಟಬಲ್ ಟ್ರಸ್ಟ್ ವತಿಯಿಂದ ಕರ್ನಾಟಕ ನೀರಾವರಿ ನಿಗಮ ನಿಯಮಿತ ನಂ.೩ ಬಿ.ಆರ್.ಎಲ್.ಬಿ.ಸಿ ವಿಭಾಗದ ಸಹಾಯಕ ಕಾರ್ಯಪಾಲಕ ಅಭಿಯಂತರ ಆರ್.ಬಿ ಮಂಜುನಾಥ್‌ಗೆ ಮಂಗಳವಾರ ಮನವಿ ಸಲ್ಲಿಸಲಾಯಿತು.
   ಕಳೆದ ಸುಮಾರು ೨೫ ವರ್ಷಗಳಿಂದ ನಗರಸಭೆ ವ್ಯಾಪ್ತಿಯಲ್ಲಿರುವ ಯಾವುದೇ ಕೆರೆಯ ಬೌಂಡರಿ ನಿಗದಿಪಡಿಸಿಲ್ಲ. ಜೊತೆಗೆ ಅಭಿವೃದ್ದಿ ಸಹ ಕೈಗೊಂಡಿಲ್ಲ. ದಕ್ಷ ಅಧಿಕಾರಿಯಾಗಿರುವ ಮನೋಹರ್ ನಗರಸಭೆ ಪೌರಾಯುಕ್ತರಾಗಿ ಅಧಿಕಾರ ವಹಿಸಿಕೊಂಡ ನಂತರ ರೈತರಿಗೆ, ದನಗಾಹಿಗಳಿಗೆ ಹಾಗು ಸಾರ್ವಜನಿಕರಿಗೆ ಅನುಕೂಲ ಕಲ್ಪಿಸಿಕೊಡುವ ನಿಟ್ಟಿನಲ್ಲಿ ನಗರಸಭೆ ವ್ಯಾಪ್ತಿಯಲ್ಲಿರುವ ಸುಮಾರು ೭೦ ಕೆರೆಗಳನ್ನು ಗುರುತಿಸಿದ್ದು, ತಾಲೂಕು ಆಡಳಿತದಿಂದ ಬೌಂಡರಿ ನಿಗದಿಪಡಿಸುವಲ್ಲಿ ಯಶಸ್ವಿಯಾಗಿದ್ದು,  ಇದೀಗ ಕೆರೆಗಳ ಅಭಿವೃದ್ಧಿಗೆ ಮುಂದಾಗಿದ್ದಾರೆ.
    ಈಗಾಗಲೇ ತಾಲೂಕು ಆಡಳಿತದ ಅಧೀನದಲ್ಲಿರುವ ಸುಮಾರು ೧೭ ಕೆರೆಗಳನ್ನು, ಜಿಲ್ಲಾ ಪಂಚಾಯಿತಿ ಅಧೀನದಲ್ಲಿರುವ ಸುಮಾರು ೧೫ ಕೆರೆಗಳನ್ನು ಅಭಿವೃದ್ಧಿಪಡಿಸುವ ಉದ್ದೇಶದಿಂದ ನಗರಸಭೆ ಆಡಳಿತಕ್ಕೆ ಹಸ್ತಾಂತರಿಸಲಾಗಿದೆ.  ಕರ್ನಾಟಕ ನೀರಾವರಿ ನಿಗಮದಲ್ಲಿ ಕೆರೆಗಳ ಅಭಿವೃದ್ಧಿಗೆ ಯಾವುದೇ ವಿಶೇಷ ಅನುದಾನ ಲಭ್ಯವಿರುವುದಿಲ್ಲ. ಈ ಹಿನ್ನಲೆಯಲ್ಲಿ ನಿಗಮಕ್ಕೆ ಸೇರಿದ ಕೆರೆಗಳನ್ನು ನಗರಸಭೆಗೆ ಹಸ್ತಾಂತರಿಸುವಂತೆ ಮನವಿಯಲ್ಲಿ ಕೋರಲಾಗಿದೆ.
   ಟ್ರಸ್ಟ್ ಛೇರ್ಮನ್, ನಗರಸಭೆ ಸ್ಥಾಯಿ ಸಮಿತಿ ಮಾಜಿ ಅಧ್ಯಕ್ಷ ಆರ್. ವೇಣುಗೋಪಾಲ್, ಮುಖಂಡರಾದ ವಿಶ್ವೇಶ್ವರರಾವ್ ಗಾಯಕ್ವಾಡ್, ಗಿರಿನಾಯ್ದು, ಎನ್. ರಾಮಕೃಷ್ಣ, ಮುರುಗನ್, ಪ್ರಸನ್ನ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

Monday, February 8, 2021

೩ ಗ್ರಾಮ ಪಂಚಾಯಿತಿಗಳಿಗೆ ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆ

ದೊಡ್ಡೇರಿ ಆಧ್ಯಕ್ಷ, ಉಪಾಧ್ಯಕ್ಷ ೨ ಸ್ಥಾನಗಳು ಕಾಂಗ್ರೆಸ್ ತೆಕ್ಕೆಗೆ

ಭದ್ರಾವತಿ ದೊಡ್ಡೇರಿ ಗ್ರಾಮ ಪಂಚಾಯಿತಿ ಅಧ್ಯಕ್ಷ ಮತ್ತು ಉಪಾಧ್ಯಕ್ಷ ಸ್ಥಾನಗಳಿಗೆ ಕಾಂಗ್ರೆಸ್ ಬೆಂಬಲಿತರು ಆಯ್ಕೆಯಾದ ಹಿನ್ನಲೆಯಲ್ಲಿ ಸೋಮವಾರ ಪಂಚಾಯಿತಿ ಮುಂಭಾಗ ಕಾರ್ಯಕರ್ತರು ಸಂಭ್ರಮಾಚರಣೆ ನಡೆಸಿದರು.
    ಭದ್ರಾವತಿ, ಫೆ. ೮: ತಾಲೂಕಿನ ೩ ಗ್ರಾಮ ಪಂಚಾಯಿತಿಗಳ ಅಧ್ಯಕ್ಷ, ಉಪಾಧ್ಯಕ್ಷ ಸ್ಥಾನಗಳಿಗೆ ಸೋಮವಾರ ಚುನಾವಣೆ ನಡೆಯಿತು.
      ತಡಸ ಗ್ರಾಮ ಪಂಚಾಯಿತಿ 'ಎ'ವರ್ಗ ಮಹಿಳೆಗೆ ಮೀಸಲಾದ ಅಧ್ಯಕ್ಷ ಸ್ಥಾನಕ್ಕೆ ನಾಜೀಮಾ ಬಿ ಹಾಗು ಸಾಮಾನ್ಯ ವರ್ಗಕ್ಕೆ ಮೀಸಲಾದ ಉಪಾಧ್ಯಕ್ಷ ಸ್ಥಾನಕ್ಕೆ ಸೈಯದ್ ಇಬ್ರಾಹಿಂ ಆಯ್ಕೆಯಾಗಿದ್ದಾರೆ. ತಾಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಕೆ.ಜೆ ತಮ್ಮಣ್ಣಗೌಡ ಚುನಾವಣಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸಿದರು. ಕಾಂಗ್ರೆಸ್ ಮತ್ತು ಜೆಡಿಎಸ್ ಪಕ್ಷಗಳ ಬೆಂಬಲಿಗರು ಅಧಿಕಾರ ಹಿಡಿಯುವಲ್ಲಿ ಯಶಸ್ವಿಯಾಗಿದ್ದಾರೆ ಎನ್ನಲಾಗಿದೆ.
     ದೊಡ್ಡೇರಿ ಗ್ರಾಮ ಪಂಚಾಯಿತಿ ಸಾಮಾನ್ಯ ವರ್ಗಕ್ಕೆ ಮೀಸಲಾದ ಅಧ್ಯಕ್ಷ ಸ್ಥಾನಕ್ಕೆ ಆಗ ಷರೀಫ್, ಪರಿಶಿಷ್ಟ ಜಾತಿ ಮಹಿಳೆಗೆ ಮೀಸಲಾದ ಉಪಾಧ್ಯಕ್ಷ ಸ್ಥಾನಕ್ಕೆ ಪಿ. ಹೇಮಾವತಿ ಆಯ್ಕೆಯಾಗಿದ್ದಾರೆ. ತೋಟಗಾರಿಕೆ ಇಲಾಖೆ ಹಿರಿಯ ಸಹಾಯಕ ನಿರ್ದೇಶಕ ಕಾಂತರಾಜ್ ಚುನಾವಣಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸಿದರು. ಕಾಂಗ್ರೆಸ್ ಪಕ್ಷದ ಬೆಂಬಲಿಗರು ಅಧಿಕಾರ ಹಿಡಿಯುವಲ್ಲಿ ಯಶಸ್ವಿಯಾಗಿದ್ದಾರೆ.
      ಬಿಳಿಕಿ ಗ್ರಾಮ ಪಂಚಾಯಿತಿ ಪರಿಶಿಷ್ಟ ಜಾತಿ ಮಹಿಳೆಗೆ ಮೀಸಲಾದ ಅಧ್ಯಕ್ಷ ಸ್ಥಾನಕ್ಕೆ ಪಾಪಿ ಬಾಯಿ, ಸಾಮಾನ್ಯ ವರ್ಗಕ್ಕೆ ಮೀಸಲಾದ ಉಪಾಧ್ಯಕ್ಷ ಸ್ಥಾನಕ್ಕೆ ಹೇಮಣ್ಣ .ಆರ್ ಆಯ್ಕೆಯಾಗಿದ್ದಾರೆ. ಕ್ಷೇತ್ರ ಶಿಕ್ಷಣಾಧಿಕಾರಿ ಟಿ.ಎನ್ ಸೋಮಶೇಖರಯ್ಯ ಚುನಾವಣಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸಿದರು. ಬಿಜೆಪಿ ಮತ್ತು ಜೆಡಿಎಸ್ ಬೆಂಬಲಿಗರು ಅಧಿಕಾರ ಹಿಡಿಯುವಲ್ಲಿ ಯಶಸ್ವಿಯಾಗಿದ್ದಾರೆ.
    ಕಾಂಗ್ರೆಸ್ ಕಾರ್ಯಕರ್ತರ ಸಂಭ್ರಮಾಚರಣೆ:
    ದೊಡ್ಡೇರಿ ಗ್ರಾಮ ಪಂಚಾಯಿತಿ ಅಧ್ಯಕ್ಷ ಮತ್ತು ಉಪಾಧ್ಯಕ್ಷ ಸ್ಥಾನಗಳಿಗೆ ಕಾಂಗ್ರೆಸ್ ಬೆಂಬಲಿತರು ಆಯ್ಕೆಯಾದ ಹಿನ್ನಲೆಯಲ್ಲಿ ಪಂಚಾಯಿತಿ ಮುಂಭಾಗ ಕಾರ್ಯಕರ್ತರು ಸಂಭ್ರಮಾಚರಣೆ ನಡೆಸಿದರು.
   ಶಾಸಕ ಬಿ.ಕೆ ಸಂಗಮೇಶ್ವರ್ ಸಹೋದರ ಬಿ.ಕೆ ಶಿವಕುಮಾರ್, ಪುತ್ರ ಬಿ.ಎಸ್ ಬಸವೇಶ್ ಹಾಗು ಕಾಂಗ್ರೆಸ್ ಬೆಂಬಲಿತ ಸದಸ್ಯರುಗಳು ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

Sunday, February 7, 2021

ಸುರಗಿತೋಪು ಗ್ರಾಮ ದೇವತೆ ಶ್ರೀ ಚೌಡೇಶ್ವರಿ ದೇವಿ ಜಾತ್ರಾ ಮಹೋತ್ಸವಕ್ಕೆ ಚಾಲನೆ

     ಭದ್ರಾವತಿ, ಫೆ. ೮: ಸುರಗಿತೋಪಿನ ಗ್ರಾಮ ದೇವತೆ ಶ್ರೀ ಚೌಡೇಶ್ವರಿ ಹಾಗು ಮುನೇಶ್ವರ ಸ್ವಾಮಿಯ ೫೧ನೇ ವರ್ಷದ ೨ ದಿನಗಳ ಜಾತ್ರಾ ಮಹೋತ್ಸವ ಸೋಮವಾರ ಆರಂಭಗೊಂಡಿತು.
     ಬೆಳಿಗ್ಗೆ ನಾಗರಕಟ್ಟೆಯಿಂದ ದೇವಸ್ಥಾನಕ್ಕೆ ಗಂಗೆ ತರುವ ಕಾರ್ಯಕ್ರಮ ಜರುಗಿತು. ಅಮ್ಮನವರಿಗೆ ಅಭಿಷೇಕ, ವಿಶೇಷ ಪೂಜೆ ಹಾಗು ದೇವಸ್ಥಾನದ ಕಾಂಪೌಂಡ್ ನಿರ್ಮಾಣಕ್ಕೆ ಭೂಮಿ ಪೂಜೆ ಮತ್ತು ಮಧ್ಯಾಹ್ನ ಅನ್ನಸಂತರ್ಪಣೆ ಕಾರ್ಯಕ್ರಮಗಳು ಜರುಗಿದವು. ದೇವಸ್ಥಾನದ ಪ್ರಧಾನ ಅರ್ಚಕ ಮುರಳಿಧರ ನೇತೃತ್ವದಲ್ಲಿ ಧಾರ್ಮಿಕ ಆಚರಣೆಗಳು ಜರುಗಿದವು. ನೂರಾರು ಭಕ್ತಾಧಿಗಳು ಪಾಲ್ಗೊಂಡಿದ್ದರು.
    ಫೆ.೯ರಂದು ಬೆಳಿಗ್ಗೆ ಪೊಲೀಸ್ ಉಮೇಶ್‌ರವರಿಂದ ಆ ದಿನದ ಪೂಜೆಗೆ ಚಾಲನೆ ನಡೆಯಲಿದ್ದು, ವಿವಿಧ ರಾಜಕೀಯ ಪಕ್ಷಗಳ ಮುಖಂಡರಾದ ಎಂ. ಪ್ರಭಾಕರ್, ಜಿ. ಧರ್ಮಪ್ರಸಾದ್, ಎನ್. ಗೋಕುಲ್ ಕೃಷ್ಣನ್ ಸೇರಿದಂತೆ ಇನ್ನಿತರರು ಉಪಸ್ಥಿತರಿರುವರು. ಮಧ್ಯಾಹ್ನ ೧ ಗಂಟೆಗೆ ಶಾಸಕ ಬಿ.ಕೆ ಸಂಗಮೇಶ್ವರ್ ಉತ್ಸವ ಮೂರ್ತಿ ಮೆರವಣಿಗೆಗೆ ಚಾಲನೆ ನೀಡಲಿದ್ದು, ನಗರಸಭೆ ಪೌರಾಯುಕ್ತ ಮನೋಹರ್ ಸೇರಿದಂತೆ ಇನ್ನಿತರರು ಪಾಲ್ಗೊಳ್ಳಲಿದ್ದಾರೆ.
 

ಭದ್ರಾವತಿ ಸುರಗಿತೋಪಿನ ಗ್ರಾಮ ದೇವತೆ ಶ್ರೀ ಚೌಡೇಶ್ವರಿ ಹಾಗು ಮುನೇಶ್ವರ ಸ್ವಾಮಿಯ ೫೧ನೇ ವರ್ಷದ ೨ ದಿನಗಳ ಜಾತ್ರಾ ಮಹೋತ್ಸವ ಸೋಮವಾರ ಆರಂಭಗೊಂಡಿತು.