Saturday, February 13, 2021

ಪ್ರತಿಯೊಬ್ಬರೂ ಕಾನೂನಿನ ಅರಿವು ಹೊಂದಲಿ : ಎಂ. ಶಿವಕುಮಾರ್

ಭದ್ರಾವತಿ ನ್ಯೂಟೌನ್ ಸಿಲ್ವರ್ ಜ್ಯೂಬಲಿ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪ್ರೌಢಶಾಲಾ ವಿಭಾಗದಲ್ಲಿ ತಾಲೂಕು ಕಾನೂನು ಸೇವಾ ಸಮಿತಿ ಹಾಗು ವಕೀಲರ ಸಂಘದ ಸಹಯೋಗದೊಂದಿಗೆ ಕಾನೂನು ಅರಿವು ನೆರವು ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.
  ಭದ್ರಾವತಿ, ಫೆ. ೧೨: ಪ್ರತಿಯೊಬ್ಬರೂ ಕಾನೂನಿನ ಅರಿವು ಹೊಂದುವ ಮೂಲಕ ಅವುಗಳನ್ನು ಸದ್ಬಳಕೆ ಮಾಡಿಕೊಳ್ಳಬೇಕೆಂದು ನ್ಯಾಯವಾದಿ ಎಂ. ಶಿವಕುಮಾರ್ ತಿಳಿಸಿದರು.
  ಅವರು ನ್ಯೂಟೌನ್ ಸಿಲ್ವರ್ ಜ್ಯೂಬಲಿ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪ್ರೌಢಶಾಲಾ ವಿಭಾಗದಲ್ಲಿ ತಾಲೂಕು ಕಾನೂನು ಸೇವಾ ಸಮಿತಿ ಹಾಗು ವಕೀಲರ ಸಂಘದ ಸಹಯೋಗದೊಂದಿಗೆ ಹಮ್ಮಿಕೊಳ್ಳಲಾಗಿದ್ದ ಕಾನೂನು ಅರಿವು ನೆರವು ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಪಾಲ್ಗೊಂಡು ಮಾತನಾಡಿದರು.
   ದೇಶದಲ್ಲಿ ಪ್ರತಿಯೊಬ್ಬರ ರಕ್ಷಣೆಗೆ ಅಗತ್ಯವಿರುವ ಕಾನೂನುಗಳನ್ನು ರೂಪಿಸಲಾಗಿದೆ. ಅದರಲ್ಲೂ ಮಕ್ಕಳ ಮೇಲಿನ ಶೋಷಣೆಗಳಿಗೆ ಸಂಬಂಧಿಸಿದ ಹಲವು ಕಾನೂನುಗಳಿದ್ದು, ಹೆಣ್ಣು ಮಕ್ಕಳ ಮೇಲಿನ ಲೈಂಗಿಕ ದೌರ್ಜನ್ಯ, ಬಾಲಪರಾಧ, ಬಾಲ್ಯ ವಿವಾಹ, ಕಾನೂನು ಬಾಹಿರ ಚಟುವಟಿಕೆಗಳಿಗೆ ಮಕ್ಕಳ ದುರ್ಬಳಕೆ ಸೇರಿದಂತೆ ಹಲವು ಅಪರಾಧಗಳಿಗೆ ಕಾನೂನುಗಳನ್ನು ರೂಪಿಸಲಾಗಿದೆ. ಆ ಮೂಲಕ ಅಪರಾಧಿಗಳಿಗೆ ಸೂಕ್ತ ಶಿಕ್ಷೆಗಳನ್ನು ನಿಗದಿಪಡಿಸಲಾಗಿದೆ. ಇವುಗಳ ಕುರಿತು ಶಾಲಾ ಮಕ್ಕಳು ತಿಳುವಳಿಕೆ ಹೊಂದಬೇಕೆಂದರು.
   ಉಪ ಪ್ರಾಚಾರ್ಯ ಕೆ.ಎಚ್ ಮೋಹನೇಶ್ ಮಾತನಾಡಿ, ದೇಶದಲ್ಲಿ ಹಲವು ಕಾನೂನುಗಳನ್ನು ರೂಪಿಸಲಾಗಿದ್ದರೂ ಸಹ ಅಪರಾಧಗಳ ಪ್ರಮಾಣ ಕಡಿಮೆಯಾಗಿಲ್ಲ. ಈ ನಿಟ್ಟಿನಲ್ಲಿ ಶಾಲಾ ಹಂತದಲ್ಲಿಯೇ ಕಾನೂನಿನ ಬಗ್ಗೆ ಅರಿವು ಮೂಡಿಸುವ ಮೂಲಕ ಜಾಗೃತಿಗೊಳಿಸುವ ಪ್ರಯತ್ನ ಮಾಡಲಾಗುತ್ತಿದೆ. ಈ ಮೂಲಕ ಅಪರಾಧಗಳ ಪ್ರಮಾಣ ಕಡಿಮೆಗೊಳಿಸಬಹುದಾಗಿದೆ. ವಿದ್ಯಾರ್ಥಿಗಳು ಈ ಕಾರ್ಯಕ್ರಮದ ಸದುಪಯೋಗ ಪಡೆದುಕೊಳ್ಳಬೇಕೆಂದರು.
   ಕಾರ್ಯಕ್ರಮವನ್ನು ಜೆಎಂಎಫ್‌ಸಿ ೧ನೇ ಹೆಚ್ಚುವರಿ ಸಿವಿಲ್ ನ್ಯಾಯಾಧೀಶ ಟಿ.ಪಿ ಪುರುಷೋತ್ತಮ್ ಉದ್ಘಾಟಿಸಿದರು. ತಾಲೂಕು ವಕೀಲರ ಸಂಘದ ಉಪಾಧ್ಯಕ್ಷ ವೈ. ಜಯರಾಂ, ಕಾರ್ಯದರ್ಶಿ ಟಿ.ಎಸ್ ರಾಜು, ಸಿಆರ್‌ಪಿ ಸಿ. ಚನ್ನಪ್ಪ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.
   ಶಾಲೆಯ ದೈಹಿಕ ಶಿಕ್ಷಕ ಎನ್.ಕೆ ಪಾಲಾಕ್ಷಪ್ಪ, ಮಹಾದೇವಿ ಪ್ರಾರ್ಥಿಸಿದರು. ಸಹ ಶಿಕ್ಷಕಿ ಛಾಯಾ ಶ್ಯಾಮ್‌ಸುಂದರ್ ವಂದಿಸಿದರು.

ಭದ್ರಾವತಿ : ೧೫ ಗ್ರಾಮ ಪಂಚಾಯಿತಿಗಳ ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆ

ಭದ್ರಾವತಿ ಸಿಂಗನಮನೆ ಗ್ರಾಮ ಪಂಚಾಯಿತಿಗೆ ನೂತನವಾಗಿ ಆಯ್ಕೆಯಾದ ಕಾಂಗ್ರೆಸ್ ಬೆಂಬಲಿಗ ಅಧ್ಯಕ್ಷರು ಮತ್ತು ಉಪಾಧ್ಯಕ್ಷರನ್ನು ಶಾಸಕ ಬಿ.ಕೆ ಸಂಗಮೇಶ್ವರ್ ಸನ್ಮಾನಿಸಿ ಅಭಿನಂದಿಸಿದರು.
   ಭದ್ರಾವತಿ, ಫೆ. ೧೧: ತಾಲೂಕಿನ ೧೫ ಗ್ರಾಮ ಪಂಚಾಯಿತಿಗಳ ಅಧ್ಯಕ್ಷ ಮತ್ತು ಉಪಾಧ್ಯಕ್ಷರ ಚುನಾವಣೆ ಗುರುವಾರ ಮತ್ತು ಶುಕ್ರವಾರ ನಡೆಯಿತು. ಕೆಲವು ಕಡೆ ಅವಿರೋಧ ಆಯ್ಕೆ ನಡೆದರೆ, ಮತ್ತೆ ಕೆಲವೆಡೆ ಚುನಾವಣೆ ನಡೆಯಿತು.
   ದಾಸರ ಕಲ್ಲಳ್ಳಿ ಗ್ರಾಮ ಪಂಚಾಯಿತಿಯಲ್ಲಿ ಒಟ್ಟು ೧೦ ಸದಸ್ಯರಿದ್ದು, 'ಬಿ' ವರ್ಗಕ್ಕೆ ಮೀಸಲಾದ ಅಧ್ಯಕ್ಷ ಸ್ಥಾನಕ್ಕೆ ಎ.ಜಿ ಮಲ್ಲನಗೌಡ ಹಾಗು 'ಎ' ವರ್ಗ ಮಹಿಳೆಗೆ ಮೀಸಲಾದ ಉಪಾಧ್ಯಕ್ಷ ಸ್ಥಾನಕ್ಕೆ ನೀಲಮ್ಮ ಆಯ್ಕೆಯಾಗಿದ್ದಾರೆ. ಮೀನುಗಾರಿಕೆ ಇಲಾಖೆ ಸಹಾಯಕ ನಿರ್ದೇಶಕ ಗಣೇಶ್‌ರಾಜ್ ಚುನಾವಣಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸಿದರು. ಈ ಪಂಚಾಯಿತಿಯಲ್ಲಿ ಅಧ್ಯಕ್ಷ ಮತ್ತು ಉಪಾಧ್ಯಕ್ಷ ಎರಡೂ ಸ್ಥಾನಗಳೂ ಬಿಜೆಪಿ ಬೆಂಬಲಿಗರ ಪಾಲಾಗಿವೆ.
    ಕಲ್ಲಿಹಾಳ್ ಗ್ರಾಮ ಪಂಚಾಯಿತಿಯಲ್ಲಿ ಒಟ್ಟು ೧೦ ಸದಸ್ಯರಿದ್ದು,  ಸಾಮಾನ್ಯ ಸ್ಥಾನಕ್ಕೆ ಮೀಸಲಾದ ಅಧ್ಯಕ್ಷ ಸ್ಥಾನಕ್ಕೆ ಶ್ರೀನಿವಾಸ್ ಕುಮಾರ್ ಎ.ಜಿ ಹಾಗು ಪರಿಶಿಷ್ಟ ಜಾತಿ ಮಹಿಳೆಗೆ ಮೀಸಲಾದ ಉಪಾಧ್ಯಕ್ಷ ಸ್ಥಾನಕ್ಕೆ ರಮ್ಯ ಆಯ್ಕೆಯಾಗಿದ್ದಾರೆ. ಕೃಷಿ ಇಲಾಖೆ ಸಹಾಯಕ ನಿರ್ದೇಶಕ ಬಿ.ಸಿ ಶಶಿಧರ್ ಚುನಾವಣಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸಿದರು. ಈ ಪಂಚಾಯಿತಿಯಲ್ಲಿ ಅಧ್ಯಕ್ಷ ಮತ್ತು ಉಪಾಧ್ಯಕ್ಷ ಎರಡೂ ಸ್ಥಾನಗಳೂ ಬಿಜೆಪಿ ಬೆಂಬಲಿಗರ ಪಾಲಾಗಿವೆ.
   ಕಾರೆಹಳ್ಳಿ ಗ್ರಾಮ ಪಂಚಾಯಿತಿಯಲ್ಲಿ ಒಟ್ಟು ೧೧ ಸದಸ್ಯರಿದ್ದು, ಪರಿಶಿಷ್ಟ ಜಾತಿ ಮಹಿಳೆಗೆ ಮೀಸಲಾದ ಅಧ್ಯಕ್ಷ ಸ್ಥಾನಕ್ಕೆ ಜಿ. ಮಮತ ಹಾಗು ಸಾಮಾನ್ಯ ವರ್ಗಕ್ಕೆ ಮೀಸಲಾದ ಉಪಾಧ್ಯಕ್ಷ ಸ್ಥಾನಕ್ಕೆ ಪಾರ್ವತಮ್ಮ ಆಯ್ಕೆಯಾಗಿದ್ದಾರೆ.  ತಾಲೂಕು ಪಂಚಾಯಿತಿ ಅಕ್ಷರ ದಾಸೋಹ ಸಹಾಯಕ ನಿರ್ದೇಶಕ ಬಿ. ನಟರಾಜ್ ಚುನಾವಣಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸಿದರು. ಈ ಪಂಚಾಯಿತಿಯಲ್ಲಿ ಶಾಸಕ ಬಿ.ಕೆ ಸಂಗಮೇಶ್ವರ್ ಹಾಗು ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಎಸ್. ಕುಮಾರ್ ಬೆಂಬಲಿಗರು ಅಧಿಕಾರ ಹಿಡಿಯುವಲ್ಲಿ ಯಶಸ್ವಿಯಾಗಿದ್ದಾರೆ.
    ಮೈದೊಳಲು ಗ್ರಾಮ ಪಂಚಾಯಿತಿಯಲ್ಲಿ ಒಟ್ಟು ೧೩ ಸದಸ್ಯರಿದ್ದು, ಸಾಮಾನ್ಯ ಮಹಿಳೆಗೆ ಮೀಸಲಾದ ಅಧ್ಯಕ್ಷ ಸ್ಥಾನಕ್ಕೆ ರೇಣುಕಾಬಾಯಿ ಹಾಗು ಪರಿಶಿಷ್ಟ ಜಾತಿಗೆ ಮೀಸಲಾದ ಉಪಾಧ್ಯಕ್ಷ ಸ್ಥಾನಕ್ಕೆ ಎಂ.ಎಸ್ ಲಕ್ಷ್ಮೀಕಾಂತ ಆಯ್ಕೆಯಾಗಿದ್ದಾರೆ. ಪಶು ಇಲಾಖೆ ಸಹಾಯಕ ನಿರ್ದೇಶಕ ಡಾ. ಕೆ. ಬಸವರಾಜ್ ಚುನಾವಣಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸಿದರು. ಈ ಪಂಚಾಯಿತಿಯಲ್ಲಿ ಅಧ್ಯಕ್ಷ ಮತ್ತು ಉಪಾಧ್ಯಕ್ಷ ಎರಡೂ ಸ್ಥಾನಗಳೂ ಬಿಜೆಪಿ ಬೆಂಬಲಿಗರ ಪಾಲಾಗಿವೆ.
   ನಿಂಬೆಗೊಂದಿ ಗ್ರಾಮ ಪಂಚಾಯಿತಿಯಲ್ಲಿ ಒಟ್ಟು ೯ ಸದಸ್ಯರಿದ್ದು, ಪರಿಶಿಷ್ಟ ಜಾತಿ ಮಹಿಳೆಗೆ ಮೀಸಲಾದ ಅಧ್ಯಕ್ಷ ಸ್ಥಾನಕ್ಕೆ  ಶಾಲಿನಿ ಹಾಗು ಸಾಮಾನ್ಯ ವರ್ಗಕ್ಕೆ ಮೀಸಲಾದ ಉಪಾಧ್ಯಕ್ಷ ಸ್ಥಾನಕ್ಕೆ ಎಂ. ಮಹಾದೇವಪ್ಪ ಆಯ್ಕೆಯಾಗಿದ್ದಾರೆ. ತಾಲೂಕು ಪಂಚಾಯಿತಿ ಸಹಾಯಕ ನಿರ್ದೇಶಕ ಚೇತನ್ ಚುನಾವಣಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸಿದರು. ಈ ಪಂಚಾಯಿತಿಯಲ್ಲೂ ಅಧ್ಯಕ್ಷ ಮತ್ತು ಉಪಾಧ್ಯಕ್ಷ ಎರಡೂ ಸ್ಥಾನಗಳೂ ಬಿಜೆಪಿ ಬೆಂಬಲಿಗರ ಪಾಲಾಗಿವೆ.
    ತಾಲೂಕಿನ ಅರಳಿಹಳ್ಳಿ ಗ್ರಾಮ ಪಂಚಾಯಿತಿಯಲ್ಲಿ ಒಟ್ಟು ೯ ಸದಸ್ಯರಿದ್ದು, ಸಾಮಾನ್ಯ ವರ್ಗ ಮಹಿಳೆಗೆ ಮೀಸಲಾದ ಅಧ್ಯಕ್ಷ ಸ್ಥಾನಕ್ಕೆ ಕೋಮಲ ಹಾಗು 'ಎ' ವರ್ಗಕ್ಕೆ ಮೀಸಲಾದ ಉಪಾಧ್ಯಕ್ಷ ಸ್ಥಾನಕ್ಕೆ ರುದ್ರೇಶ್ ಆಯ್ಕೆಯಾಗಿದ್ದಾರೆ. ಕ್ಷೇತ್ರ ಶಿಕ್ಷಣಾಧಿಕಾರಿ ಟಿ.ಎನ್ ಸೋಮಶೇಖರಯ್ಯ ಚುನಾವಣಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸಿದರು. ಈ ಪಂಚಾಯಿತಿಯಲ್ಲಿ ಅಧ್ಯಕ್ಷ ಹಾಗು ಉಪಾಧ್ಯಕ್ಷ ಎರಡೂ ಸ್ಥಾನಗಳೂ ಕಾಂಗ್ರೆಸ್ ಬೆಂಬಲಿಗರ ಪಾಲಾಗಿವೆ.
    ನಾಗತಿಬೆಳಗಲು ಗ್ರಾಮ ಪಂಚಾಯಿತಿಯಲ್ಲಿ ಒಟ್ಟು ೧೧ ಜನ ಸದಸ್ಯರಿದ್ದು, ಸಾಮಾನ್ಯ ವರ್ಗ ಮಹಿಳೆಗೆ ಮೀಸಲಾದ ಅಧ್ಯಕ್ಷ ಸ್ಥಾನಕ್ಕೆ ಗೀತಾ ಬಾಯಿ ಹಾಗು ಸಾಮಾನ್ಯ ವರ್ಗಕ್ಕೆ ಮೀಸಲಾದ ಉಪಾಧ್ಯಕ್ಷ ಸ್ಥಾನಕ್ಕೆ ವೇಲುಸ್ವಾಮಿ ಆಯ್ಕೆಯಾಗಿದ್ದಾರೆ. ಮೀನುಗಾರಿಕೆ ಇಲಾಖೆ ಸಹಾಯಕ ನಿರ್ದೇಶಕ ಗಣೇಶ್‌ರಾಜ್ ಚುನಾವಣಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸಿದರು. ಈ ಪಂಚಾಯಿತಿಯಲ್ಲಿ ಎರಡೂ ಸ್ಥಾನಗಳೂ ಜೆಡಿಎಸ್ ಬೆಂಬಲಿಗರ ಪಾಲಾಗಿವೆ.
    ಕಾಗೇಕೋಡಮಗ್ಗೆ ಗ್ರಾಮ ಪಂಚಾಯಿತಿಯಲ್ಲಿ ಒಟ್ಟು ೧೨ ಸದಸ್ಯರಿದ್ದು, 'ಎ' ವರ್ಗ ಮಹಿಳೆಗೆ ಮೀಸಲಾದ ಅಧ್ಯಕ್ಷ ಸ್ಥಾನಕ್ಕೆ ಟಿ.ಎನ್ ಶಕೀಲಾಬಾನು ಹಾಗು 'ಬಿ' ವರ್ಗ ಮಹಿಳೆಗೆ ಮೀಸಲಾದ ಉಪಾಧ್ಯಕ್ಷ ಸ್ಥಾನಕ್ಕೆ ಶಬ್ನಂಬಾನು ಆಯ್ಕೆಯಾಗಿದ್ದಾರೆ. ಚುನಾವಣಾಧಿಕಾರಿಯಾಗಿ ಕ್ಷೇತ್ರ ಶಿಕ್ಷಣಾಧಿಕಾರಿ ಟಿ.ಎನ್ ಸೋಮಶೇಖರಯ್ಯ ಕರ್ತವ್ಯ ನಿರ್ವಹಿಸಿದರು. ಈ ಪಂಚಾಯಿತಿಯಲ್ಲಿ ಅಧ್ಯಕ್ಷ ಸ್ಥಾನ ಕಾಂಗ್ರೆಸ್ ಹಾಗು ಉಪಾಧ್ಯಕ್ಷ ಸ್ಥಾನ ಜೆಡಿಎಸ್ ಬೆಂಬಲಿರ ಪಾಲಾಗಿವೆ.
    ಅಂತರಗಂಗೆ ಗ್ರಾಮ ಪಂಚಾಯಿತಿಯಲ್ಲಿ ಒಟ್ಟು ೧೫ ಸದಸ್ಯರಿದ್ದು, ಸಾಮಾನ್ಯ ವರ್ಗ ಮಹಿಳೆಗೆ ಮೀಸಲಾದ ಅಧ್ಯಕ್ಷ ಸ್ಥಾನಕ್ಕೆ ಸವಿತ ಹಾಗು 'ಎ' ವರ್ಗಕ್ಕೆ ಮೀಸಲಾದ ಉಪಾಧ್ಯಕ್ಷ ಸ್ಥಾನಕ್ಕೆ ಟಿ.ಆರ್ ಶೋಭ ಆಯ್ಕೆಯಾಗಿದ್ದಾರೆ. ಹಿರಿಯ ತೋಟಗಾರಿಕೆ ಸಹಾಯಕ ನಿರ್ದೇಶಕ ಕಾಂತರಾಜ್ ಚುನಾವಣಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸಿದರು. ಈ ಪಂಚಾಯಿತಿಯಲ್ಲಿ ಶಾಸಕ ಬಿ.ಕೆ ಸಂಗಮೇಶ್ವರ್ ಹಾಗು ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಎಸ್. ಕುಮಾರ್ ಬೆಂಬಲಿಗರು ಅಧಿಕಾರ ಹಿಡಿಯುವಲ್ಲಿ ಯಶಸ್ವಿಯಾಗಿದ್ದಾರೆ.
    ಯರೇಹಳ್ಳಿ ಗ್ರಾಮ ಪಂಚಾಯಿತಿಯಲ್ಲಿ ಒಟ್ಟು ೧೩ ಸದಸ್ಯರಿದ್ದು, 'ಎ' ವರ್ಗಕ್ಕೆ ಮೀಸಲಾದ ಅಧ್ಯಕ್ಷ ಸ್ಥಾನಕ್ಕೆ ಎಂ. ಶ್ವೇತ ಹಾಗು ಸಾಮಾನ್ಯ ವರ್ಗ ಮಹಿಳೆಗೆ ಮೀಸಲಾದ ಉಪಾಧ್ಯಕ್ಷ ಸ್ಥಾನಕ್ಕೆ ಶಾಂತಬಾಯಿ ಆಯ್ಕೆಯಾಗಿದ್ದಾರೆ. ಹಿರಿಯ ತೋಟಗಾರಿಕೆ ಸಹಾಯಕ ನಿರ್ದೇಶಕ ಕಾಂತರಾಜ್ ಚುನಾವಣಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸಿದರು. ಈ ಪಂಚಾಯಿತಿಯಲ್ಲೂ ಶಾಸಕ ಬಿ.ಕೆ ಸಂಗಮೇಶ್ವರ್ ಹಾಗು ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಎಸ್. ಕುಮಾರ್ ಬೆಂಬಲಿಗರು ಅಧಿಕಾರ ಹಿಡಿಯುವಲ್ಲಿ ಯಶಸ್ವಿಯಾಗಿದ್ದಾರೆ.
    ಸಿಂಗನಮನೆ ಗ್ರಾಮ ಪಂಚಾಯಿತಿಯಲ್ಲಿ ಒಟ್ಟು ೨೧ ಸದಸ್ಯರಿದ್ದು, ಪರಿಶಿಷ್ಟ ಜಾತಿಗೆ ಮೀಸಲಾದ ಅಧ್ಯಕ್ಷ ಸ್ಥಾನಕ್ಕೆ ಆರ್. ಈಶ್ವರ್ ಹಾಗು ಸಾಮಾನ್ಯ ವರ್ಗ ಮಹಿಳೆಗೆ ಮೀಸಲಾದ ಉಪಾಧ್ಯಕ್ಷ ಸ್ಥಾನಕ್ಕೆ ಕವಿತಾ ಆಯ್ಕೆಯಾಗಿದ್ದಾರೆ.  ಪಶು ಇಲಾಖೆ ಸಹಾಯಕ ನಿರ್ದೇಶಕ ಡಾ. ಕೆ. ಬಸವರಾಜ್ ಚುನಾವಣಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸಿದರು. ಈ ಪಂಚಾಯಿತಿಯಲ್ಲಿ ಅಧ್ಯಕ್ಷ ಹಾಗು ಉಪಾಧ್ಯಕ್ಷ ಎರಡೂ ಸ್ಥಾನಗಳು ಕಾಂಗ್ರೆಸ್ ಬೆಂಬಲಿಗರ ಪಾಲಾಗಿವೆ. ಆರ್. ಈಶ್ವರ್ ಮೂಲತಃ ಜೆಡಿಎಸ್ ಬೆಂಬಲಿಗರಾಗಿದ್ದು, ಎರಡು ಬಾರಿ ಸದಸ್ಯರಾಗಿದ್ದಾರೆ. ಮೊದಲ ಅವಧಿಯಲ್ಲಿ ಉಪಾಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದು, ಇದೀಗ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ.
   ಕೂಡ್ಲಿಗೆರೆ ಗ್ರಾಮ ಪಂಚಾಯಿತಿಯಲ್ಲಿ ಒಟ್ಟು ೧೩ ಸದಸ್ಯರಿದ್ದು, ಸಾಮಾನ್ಯ ವರ್ಗ ಮಹಿಳೆಗೆ ಮೀಸಲಾದ ಅಧ್ಯಕ್ಷ ಸ್ಥಾನಕ್ಕೆ ಮಲಕ್ ಬಿ. ವೀರಪ್ಪನ್ ಹಾಗು ಸಾಮಾನ್ಯ ವರ್ಗಕ್ಕೆ ಮೀಸಲಾದ ಉಪಾಧ್ಯಕ್ಷ ಸ್ಥಾನಕ್ಕೆ ಕುಬೇರ ನಾಯ್ಕ ಆಯ್ಕೆಯಾಗಿದ್ದಾರೆ. ತಾಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಕೆ.ಜೆ ತಮ್ಮಣ್ಣಗೌಡ ಚುನಾವಣಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸಿದರು. ಈ ಪಂಚಾಯಿತಿಯಲ್ಲಿ ಅಧ್ಯಕ್ಷ ಹಾಗು ಉಪಾಧ್ಯಕ್ಷ ಎರಡೂ ಸ್ಥಾನಗಳು ಕಾಂಗ್ರೆಸ್ ಬೆಂಬಲಿಗರ ಪಾಲಾಗಿವೆ. ಕುಬೇರ ನಾಯ್ಕ ೩ ಬಾರಿ ಸದಸ್ಯರಾಗಿದ್ದು, ಈ ಹಿಂದೆ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದರು. ಇದೀಗ ಉಪಾಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ.
   ಆನವೇರಿ ಗ್ರಾಮ ಪಂಚಾಯಿತಿಯಲ್ಲಿ ಒಟ್ಟು ೧೧ ಸದಸ್ಯರಿದ್ದು, ಸಾಮಾನ್ಯ ವರ್ಗ ಮಹಿಳೆಗೆ ಮೀಸಲಾದ ಅಧ್ಯಕ್ಷ ಸ್ಥಾನಕ್ಕೆ ಸುಜಾತ ಬಿ.ಆರ್ ಗಿರೀಶ್ ಹಾಗು 'ಎ' ವರ್ಗಕ್ಕೆ ಮೀಸಲಾದ ಉಪಾಧ್ಯಕ್ಷ ಸ್ಥಾನಕ್ಕೆ ಬಿ.ಪಿ ತೇಜಾವತಿ ಆಯ್ಕೆಯಾಗಿದ್ದಾರೆ. ತಾಲೂಕು ಪಂಚಾಯಿತಿ ಸಹಾಯಕ ನಿರ್ದೇಶಕ ಚೇತನ್ ಚುನಾವಣಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸಿದರು.
    ಅರಹತೊಳಲು ಗ್ರಾಮ ಪಂಚಾಯಿತಿಯಲ್ಲಿ ಒಟ್ಟು ೯ ಸದಸ್ಯರಿದ್ದು, ಸಾಮಾನ್ಯ ವರ್ಗಕ್ಕೆ ಮೀಸಲಾದ ಅಧ್ಯಕ್ಷ ಸ್ಥಾನಕ್ಕೆ ಆರ್. ಪ್ರಭಾಕರ್ ಹಾಗು ಪರಿಶಿಷ್ಟ ಜಾತಿ ಮಹಿಳೆಗೆ ಮೀಸಲಾದ ಉಪಾಧ್ಯಕ್ಷ ಸ್ಥಾನಕ್ಕೆ ಶಶಿಕಲಾ ಆಯ್ಕೆಯಾಗಿದ್ದಾರೆ.  ಕೃಷಿ ಇಲಾಖೆ ಸಹಾಯಕ ನಿರ್ದೇಶಕ ಬಿ.ಸಿ ಶಶಿಧರ್ ಚುನಾವಣಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸಿದರು.
    ಅರಬಿಳಚಿ ಗ್ರಾಮ ಪಂಚಾಯಿತಿಯಲ್ಲಿ ಒಟ್ಟು ೧೪ ಸದಸ್ಯರಿದ್ದು, ಸಾಮಾನ್ಯ ವರ್ಗಕ್ಕೆ ಮೀಸಲಾದ ಅಧ್ಯಕ್ಷ ಸ್ಥಾನಕ್ಕೆ ಎಚ್.ಬಿ ಕಿರಣ್ ಹಾಗು ಸಾಮಾನ್ಯ ಮಹಿಳೆಗೆ ಮೀಸಲಾದ ಉಪಾಧ್ಯಕ್ಷ ಸ್ಥಾನಕ್ಕೆ ಬಿ.ಬಿ ಆಯಿಷಾ ಆಯ್ಕೆಯಾಗಿದ್ದಾರೆ. ಮೀನುಗಾರಿಕೆ ಇಲಾಖೆ ಸಹಾಯಕ ನಿರ್ದೇಶಕ ಗಣೇಶ್‌ರಾಜ್ ಚುನಾವಣಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸಿದರು.

Thursday, February 11, 2021

ಬೆಲೆ ಏರಿಕೆ ಖಂಡಿಸಿ ವೆಲ್ಫೇರ್ ಪಾರ್ಟಿ ಆಫ್ ಇಂಡಿಯಾ ವತಿಯಿಂದ ಮೆರವಣಿಗೆ ತಹಸೀಲ್ದಾರ್ ಮೂಲಕ ರಾಷ್ಟ್ರಪತಿಗಳಿಗೆ ಮನವಿ

ಭದ್ರಾವತಿ ಅಗತ್ಯ ಆಹಾರ ಸಾಮಗ್ರಿಗಳು, ಅಡುಗೆ ಅನಿಲ, ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ಖಂಡಿಸಿ ವೆಲ್ಫೇರ್ ಪಾರ್ಟಿ ಆಫ್ ಇಂಡಿಯಾ ತಾಲೂಕು ಶಾಖೆ ವತಿಯಿಂದ ಗುರುವಾರ ಮೆರವಣಿಗೆ ನಡೆಸಿ ತಹಸೀಲ್ದಾರ್ ಮೂಲಕ ರಾಷ್ಟ್ರಪತಿಗಳಿಗೆ ಮನವಿ ಸಲ್ಲಿಸಲಾಯಿತು.
    ಭದ್ರಾವತಿ, ಫೆ. ೧೧: ಅಗತ್ಯ ಆಹಾರ ಸಾಮಗ್ರಿಗಳು, ಅಡುಗೆ ಅನಿಲ, ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ಖಂಡಿಸಿ ವೆಲ್ಫೇರ್ ಪಾರ್ಟಿ ಆಫ್ ಇಂಡಿಯಾ ತಾಲೂಕು ಶಾಖೆ ವತಿಯಿಂದ ಗುರುವಾರ ಮೆರವಣಿಗೆ ನಡೆಸಿ ತಹಸೀಲ್ದಾರ್ ಮೂಲಕ ರಾಷ್ಟ್ರಪತಿಗಳಿಗೆ ಮನವಿ ಸಲ್ಲಿಸಲಾಯಿತು.
  ಅಗತ್ಯ ದಿನ ಬಳಕೆ ವಸ್ತುಗಳ ಬೆಲೆ ಏರಿಕೆಯಿಂದಾಗಿ ಬಡವರು, ಶ್ರೀಸಾಮಾನ್ಯರು ಬದುಕು ಸಾಗಿಸುವುದು ಕಷ್ಟಕರವಾಗಿದೆ. ಕೇಂದ್ರ ಸರ್ಕಾರ ಬೆಲೆ ಏರಿಕೆ ತಡೆಗಟ್ಟುವಲ್ಲಿ ವಿಫಲವಾಗಿದ್ದು, ತಕ್ಷಣ ಬೆಲೆ ಏರಿಕೆಗೆ ಕಡಿವಾಣ ಹಾಕುವಂತೆ ಸರ್ಕಾರಕ್ಕೆ ಸೂಚಿಸಬೇಕೆಂದು ಆಗ್ರಹಿಸಲಾಯಿತು.
    ರಂಗಪ್ಪ ವೃತ್ತದಿಂದ ತಾಲೂಕು ಕಛೇರಿವರೆಗೂ ಮೆರವಣಿಗೆ ನಡೆಸಲಾಯಿತು. ವೆಲ್ಫೇರ್ ಪಾರ್ಟಿ ಆಪ್ ಇಂಡಿಯಾ ತಾಲೂಕು ಶಾಖೆ ಅಧ್ಯಕ್ಷ ಅಬುಲ್‌ಖೈರ್, ಪ್ರಮುಖರಾದ ಜಿಲ್ಲಾ ಉಪಾಧ್ಯಕ್ಷ ನದೀಮ್ ಬಾಷಾ, ಮಹಿಳಾ ಪ್ರಮುಖರಾದ ರೋಹಿನಾ, ಶಮೀಮಾ, ಪರ್ವೀನ್ ಮತ್ತು ಅರ್ಕಿಯಾ ಸೇರಿದಂತೆ ಇನ್ನಿತರರು ಪಾಲ್ಗೊಂಡಿದ್ದರು.

ಫೆ.೧೪ರಂದು ಡಾ.ಬಿ.ಆರ್ ಅಂಬೇಡ್ಕರ್ ಭವನ ನಿರ್ಮಾಣ ಜಾಗೃತಿ ಸಭೆ

    ಭದ್ರಾವತಿ, ಫೆ. ೧೧: ಡಾ. ಬಿ.ಆರ್ ಅಂಬೇಡ್ಕರ್ ಭವನ ಸಂರಕ್ಷಣಾ ಸಮಿತಿ ವತಿಯಿಂದ ಹಳೇನಗರದ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ ಹಿಂಭಾಗದಲ್ಲಿ ನಿರ್ಮಾಣ ಹಂತದಲ್ಲಿರುವ ಡಾ. ಬಿ.ಆರ್ ಅಂಬೇಡ್ಕರ್ ಭವನದಲ್ಲಿ ಫೆ.೧೪ರಂದು ಬೆಳಿಗ್ಗೆ ೧೧ ಗಂಟೆಗೆ ಡಾ. ಬಿ.ಆರ್ ಅಂಬೇಡ್ಕರ್ ಭವನ ನಿರ್ಮಾಣ ಜಾಗೃತಿ ಸಭೆ ಹಮ್ಮಿಕೊಳ್ಳಲಾಗಿದೆ.
     ಸಭೆಯನ್ನು ಶಾಸಕ ಬಿ.ಕೆ ಸಂಗಮೇಶ್ವರ್ ಉದ್ಘಾಟಿಸಲಿದ್ದು, ಸಮಿತಿ ಗೌರವಾಧ್ಯಕ್ಷ ಡಿ.ಸಿ ಮಾಯಣ್ಣ ಅಧ್ಯಕ್ಷತೆ ವಹಿಸಲಿದ್ದಾರೆ. ಪ್ರಮುಖರಾದ ಶಾರದಾ ಎಂ.ಜೆ ಅಪ್ಪಾಜಿ, ಕೆ.ಟಿ ಗಂಗಾಧರ್, ಇಂದಿರಾ ಬಿ. ಕೃಷ್ಣಪ್ಪ, ವಿಜಯಮ್ಮ ಎನ್ ಗಿರಿಯಪ್ಪ, ಜಿ.ಪಂ. ಅಧ್ಯಕ್ಷೆ ಜ್ಯೋತಿ ಎಸ್. ಕುಮಾರ್ ತಾ.ಪಂ. ಅಧ್ಯಕ್ಷೆ ಡಿ. ಲಕ್ಷ್ಮೀದೇವಿ, ಸರ್ಕಾರಿ ನೌಕರರ ಸಂಘದ ತಾಲೂಕು ಅಧ್ಯಕ್ಷ ಎನ್. ಕೃಷ್ಣಪ್ಪ, ನಿವೃತ್ತ ಪ್ರಾಧ್ಯಾಪಕ ಪ್ರೊ. ಎಂ. ಚಂದ್ರಶೇಖರಯ್ಯ, ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ಜಿ. ಧರ್ಮಪ್ರಸಾದ್, ಬಿ.ಕೆ ಶ್ರೀನಾಥ್, ತಹಸೀಲ್ದಾರ್ ಜಿ. ಸಂತೋಷ್‌ಕುಮಾರ್, ನಗರಸಭೆ ಪೌರಾಯುಕ್ತ ಮನೋಹರ್, ತಾ.ಪಂ. ಕಾರ್ಯನಿರ್ವಹಣಾಧಿಕಾರಿ ಕೆ.ಜೆ ತಮ್ಮಣ್ಣಗೌಡ, ಪೊಲೀಸ್ ನಗರ ವೃತ್ತ ನಿರೀಕ್ಷಕ ರಾಘವೇಂದ್ರ ಕಾಂಡಿಕೆ, ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕ ದೂದ್‌ಪೀರ್, ನಗರಸಭೆ ಮಾಜಿ ಅಧ್ಯಕ್ಷ ಆರ್. ಕರುಣಾಮೂರ್ತಿ ಸೇರಿದಂತೆ ಇನ್ನಿತರರು ಪಾಲ್ಗೊಳ್ಳಲಿದ್ದಾರೆ.
    ಸಮಿತಿ ಅಧ್ಯಕ್ಷ ಬಿ.ಎನ್ ರಾಜು ಪ್ರಾಸ್ತಾವಿಕ ನುಡಿಗಳನ್ನಾಡಲಿದ್ದು, ರೈತ, ದಲಿತ, ಕಾರ್ಮಿಕ, ವಿದ್ಯಾರ್ಥಿ ಮತ್ತು ಮಹಿಳಾ  ಸಂಘಟನೆಗಳು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಕಾರ್ಯಕ್ರಮ ಯಶಸ್ವಿಗೊಳಿಸುವಂತೆ ಕೋರಲಾಗಿದೆ.

ಶ್ರೀ ರಾಘವೇಂದ್ರ ಸ್ವಾಮಿಗಳ ಮಠದಲ್ಲಿ ಪುರಂದರದಾಸರ ಆರಾಧನಾ ಮಹೋತ್ಸವ

ಭದ್ರಾವತಿಯಲ್ಲಿ ಪುರಂದರದಾಸರ ಆರಾಧನಾ ಮಹೋತ್ಸವದ ಅಂಗವಾಗಿ ಶ್ರೀ ರಾಘವೇಂದ್ರ ಸ್ವಾಮಿಗಳ ಮಠದಿಂದ ಶ್ರೀ ಲಕ್ಷ್ಮೀನರಸಿಂಹ ಸ್ವಾಮಿ ದೇವಸ್ಥಾನದವರೆಗೆ ಪುರಂದರದಾಸರ ಮೆರವಣಿಗೆ ನಡೆಯಿತು.
   ಭದ್ರಾವತಿ, ಫೆ. ೧೧: ಹಳೇನಗರದ ಶ್ರೀ ರಾಘವೇಂದ್ರ ಸ್ವಾಮಿಗಳ ಮಠದಲ್ಲಿ ಹರಿದಾಸ ಮಹಿಳಾ ಮಂಡಳಿಯಿಂದ ಗುರುವಾರ ಪುರಂದರದಾಸರ ಆರಾಧನಾ ಮಹೋತ್ಸವ ಜರುಗಿತು.
ರಾಯರಿಗೆ ಪಂಚಾಮೃತ ಅಭಿಷೇಕ, ಶ್ರೀ ರಾಘವೇಂದ್ರ ಸ್ವಾಮಿಗಳ ಮಠದಿಂದ ಶ್ರೀ ಲಕ್ಷ್ಮೀನರಸಿಂಹ ಸ್ವಾಮಿ ದೇವಸ್ಥಾನದವರೆಗೆ ಪುರಂದರದಾಸರ ಮೆರವಣಿಗೆ ಸೇರಿದಂತೆ ಇನ್ನಿತರ ಧಾರ್ಮಿಕ ಆಚರಣೆಗಳು ಜರುಗಿದವು.
    ಜ್ಞಾನವಾಹಿನಿ ಭಜನಾ ಮಂಡಳಿ, ಹರಿಪ್ರಿಯಾ ಭಜನಾ ಮಂಡಳಿ ಸೇರಿದಂತೆ ವಿವಿಧ ಭಜನಾ ಮಂಡಳಿಗಳಿಂದ ಭಜನಾ ಕಾರ್ಯಕ್ರಮ ಹಾಗು ವೇದಬ್ರಹ್ಮ ಶ್ರೀ ಗೋಪಾಲಚಾರ್‌ರವರಿಂದ ಉಪನ್ಯಾಸ ಕಾರ್ಯಕ್ರಮ ಜರುಗಿತು.  
     ಗೋಪಾಲಚಾರ್, ಶ್ರೀನಿವಾಸಚಾರ್, ಪ್ರಧಾನ ಅರ್ಚಕ ಸತ್ಯನಾರಾಯಣ, ಪ್ರಧಾನ ಕಾರ್ಯದರ್ಶಿ ರಮಾಕಾಂತ್, ಮುರಳಿಧರ ತಂತ್ರಿ, ನಿರಂಜನ್ ಆಚಾರ್ ಸೇರಿದಂತೆ ಇನ್ನಿತರರು ಪಾಲ್ಗೊಂಡಿದ್ದರು.  

Wednesday, February 10, 2021

೮ ಗ್ರಾಮ ಪಂಚಾಯಿತಿಗಳ ಅಧ್ಯಕ್ಷ, ಉಪಾಧ್ಯಕ್ಷರ ಚುನಾವಣೆ : ಎಲ್ಲಾ ಪಂಚಾಯಿತಿಯಲ್ಲೂ ಅವಿರೋಧ ಆಯ್ಕೆ

ಭದ್ರಾವತಿ ತಾಲೂಕಿನ ತಾವರೆಘಟ್ಟ ಗ್ರಾಮ ಪಂಚಾಯಿತಿ ಅಧ್ಯಕ್ಷ ಮತ್ತು ಉಪಾಧ್ಯಕ್ಷ ಎರಡೂ ಸ್ಥಾನಗಳಲ್ಲೂ ಕಾಂಗ್ರೆಸ್ ಬೆಂಬಲಿಗರು ಅಧಿಕಾರ ಹಿಡಿಯುವಲ್ಲಿ ಯಶಸ್ವಿಯಾದ ಹಿನ್ನಲೆಯಲ್ಲಿ ನಗರಸಭೆ ಮಾಜಿ ಅಧ್ಯಕ್ಷ ಬಿ.ಕ ಮೋಹನ್ ನೇತೃತ್ವದಲ್ಲಿ ಸಂಭ್ರಮಾಚರಣೆ ನಡೆಸಲಾಯಿತು.
   ಭದ್ರಾವತಿ, ಫೆ. ೧೦:   ತಾಲೂಕಿನ ಮಂಗೋಟೆ, ಯಡೇಹಳ್ಳಿ, ಮಾರಶೆಟ್ಟಿಹಳ್ಳಿ, ದೊಣಬಘಟ್ಟ, ಮಾವಿನಕೆರೆ, ಬಾರಂದೂರು, ತಾವರಘಟ್ಟ ಮತ್ತು ಅರಕೆರೆ ಸೇರಿದಂತೆ ಒಟ್ಟು ೮ ಗ್ರಾಮ ಪಂಚಾಯಿತಿಗಳಿಗೆ ಬುಧವಾರ ಅಧ್ಯಕ್ಷ ಮತ್ತು ಉಪಾಧ್ಯಕ್ಷ ಸ್ಥಾನಗಳಿಗೆ ಚುನಾವಣೆ ನಡೆದಿದ್ದು, ೨ ಪಂಚಾಯಿತಿ ಬಿಜೆಪಿ, ೧ ಪಂಚಾಯಿತಿ ಕಾಂಗ್ರೆಸ್, ೨ ಪಂಚಾಯಿತಿ ಶಾಸಕ ಬಿ.ಕೆ ಸಂಗಮೇಶ್ವರ್ ಮತ್ತು ಜಿ.ಪಂ. ಮಾಜಿ ಸದಸ್ಯ ಎಸ್. ಕುಮಾರ್ ಬೆಂಬಲಿಗರು ಹಾಗು ೧ ಪಂಚಾಯಿತಿ ಜೆಡಿಎಸ್ ಬೆಂಬಲಿಗರ ಪಾಲಾಗಿವೆ.  
    ದೊಣಬಘಟ್ಟ ಪಂಚಾಯಿತಿಯಲ್ಲಿ ಒಟ್ಟು ೨೧ ಸದಸ್ಯರಿದ್ದು,  'ಎ' ವರ್ಗಕ್ಕೆ ಮೀಸಲಾದ ಅಧ್ಯಕ್ಷ ಸ್ಥಾನಕ್ಕೆ ಖಲೀಲ್ ಸಾಬ್ ಮತ್ತು ಪರಿಶಿಷ್ಟ ಜಾತಿ ಮಹಿಳೆಗೆ ಮೀಸಲಾದ ಉಪಾಧ್ಯಕ್ಷ ಸ್ಥಾನಕ್ಕೆ ಹಾಲಮ್ಮ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ತಾಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಕೆ.ಜೆ ತಮ್ಮಣ್ಣಗೌಡ ಚುನಾವಣಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸಿದರು. ಅಧ್ಯಕ್ಷ ಮತ್ತು ಉಪಾಧ್ಯಕ್ಷ ಎರಡು ಸ್ಥಾನಗಳು ಜೆಡಿಎಸ್ ಬೆಂಬಲಿಗರ ಪಾಲಾಗಿವೆ.
    ಬಾರಂದೂರು ಗ್ರಾಮ ಪಂಚಾಯಿತಿಯಲ್ಲಿ ಒಟ್ಟು ೧೧ ಸದಸ್ಯರಿದ್ದು, 'ಬಿ' ವರ್ಗ ಮಹಿಳೆಗೆ ಮೀಸಲಾದ ಅಧ್ಯಕ್ಷ ಸ್ಥಾನಕ್ಕೆ ನೀಲಮ್ಮ ಮತ್ತು 'ಎ' ವರ್ಗ ಮಹಿಳೆಗೆ ಮೀಸಲಾದ ಉಪಾಧ್ಯಕ್ಷ ಸ್ಥಾನಕ್ಕೆ ಸುಮಾ .ಎಸ್ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ತಾಲೂಕು ಪಂಚಾಯಿತಿ ಅಕ್ಷರ ದಾಸೋಹ ಸಹಾಯಕ ನಿರ್ದೇಶಕ ಬಿ. ನಟರಾಜ್ ಚುನಾವಣಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸಿದರು. ಈ ಪಂಚಾಯಿತಿಯಲ್ಲಿ ಶಾಸಕ ಬಿ.ಕೆ ಸಂಗಮೇಶ್ವರ್ ಮತ್ತು ಜಿ.ಪಂ. ಮಾಜಿ ಸದಸ್ಯ ಎಸ್. ಕುಮಾರ್ ಬೆಂಬಲಿಗರು ಅಧಿಕಾರ ಹಿಡಿಯುವಲ್ಲಿ ಯಶಸ್ವಿಯಾಗಿದ್ದಾರೆ.
    ತಾವರಘಟ್ಟ ಗ್ರಾಮ ಪಂಚಾಯಿತಿಯಲ್ಲಿ ಒಟ್ಟು ೧೪ ಜನ ಸದಸ್ಯರಿದ್ದು,  ಸಾಮಾನ್ಯ ವರ್ಗಕ್ಕೆ ಮೀಸಲಾದ ಅಧ್ಯಕ್ಷ ಸ್ಥಾನಕ್ಕೆ ಜಿ.ಎಸ್ ಮಹೇಶ್ವರಪ್ಪ ಮತ್ತು ಸಾಮಾನ್ಯ ಮಹಿಳೆಗೆ ಮೀಸಲಾದ ಉಪಾಧ್ಯಕ್ಷ ಸ್ಥಾನಕ್ಕೆ ಲತಾ ಅಡವಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಪಶು ಇಲಾಖೆ ಸಹಾಯಕ ನಿರ್ದೇಶಕ ಡಾ.ಕೆ. ಬಸವರಾಜ್ ಚುನಾವಣಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸಿದರು. ಈ ಪಂಚಾಯಿತಿಯ ಅಧ್ಯಕ್ಷ ಮತ್ತು ಉಪಾಧ್ಯಕ್ಷ ಎರಡೂ ಸ್ಥಾನಗಳಲ್ಲೂ ಕಾಂಗ್ರೆಸ್ ಬೆಂಬಲಿಗರು ಅಧಿಕಾರ ಹಿಡಿಯುವಲ್ಲಿ ಯಶಸ್ವಿಯಾಗಿದ್ದಾರೆ.
    ಮಂಗೋಟೆ ಗ್ರಾಮ ಪಂಚಾಯಿತಿಯಲ್ಲಿ ಒಟ್ಟು ೯ ಸದಸ್ಯರಿದ್ದು, ಸಾಮಾನ್ಯ ಮಹಿಳೆಗೆ ಮೀಸಲಾದ ಅಧ್ಯಕ್ಷ ಸ್ಥಾನಕ್ಕೆ ದ್ರಾಕ್ಷಾಯಿಣಿ .ಜಿ ಮತ್ತು ಪರಿಶಿಷ್ಟ ಜಾತಿಗೆ ಮೀಸಲಾದ ಉಪಾಧ್ಯಕ್ಷ ಸ್ಥಾನಕ್ಕೆ ಎ.ಕೆ ನಾಗರಾಜ್ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ತಾಲೂಕು ಪಂಚಾಯಿತಿ ಸಹಾಯಕ ನಿರ್ದೇಶಕ ಚೇತನ್ ಚುನಾವಣಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸಿದರು. ಈ ಪಂಚಾಯಿತಿಯಲ್ಲಿ ಅಧ್ಯಕ್ಷ ಮತ್ತು ಉಪಾಧ್ಯಕ್ಷ ಎರಡು ಸ್ಥಾನಗಳು ಬಿಜೆಪಿ ಬೆಂಬಲಿಗರ ಪಾಲಾಗಿವೆ.
     ತಾಲೂಕಿನ ಯಡೇಹಳ್ಳಿ ಗ್ರಾಮ ಪಂಚಾಯಿತಿಯಲ್ಲಿ ಒಟ್ಟು ೧೪ ಸದಸ್ಯರಿದ್ದು,  ಸಾಮಾನ್ಯ ವರ್ಗಕ್ಕೆ ಮೀಸಲಾದ ಅಧ್ಯಕ್ಷ ಸ್ಥಾನಕ್ಕೆ ಪಿ. ಮಂಜುನಾಥ್ ಮತ್ತು ಸಾಮಾನ್ಯ ಮಹಿಳೆಗೆ ಮೀಸಲಾದ ಉಪಾಧ್ಯಕ್ಷ ಸ್ಥಾನಕ್ಕೆ ಸಿ. ವಿಜಯಲಕ್ಷ್ಮಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಕೃಷಿ ಇಲಾಖೆ ಸಹಾಯಕ ನಿರ್ದೇಶಕ ಬಿ.ಸಿ ಶಶಿಧರ ಚುನಾವಣಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸಿದರು. ಈ ಪಂಚಾಯಿತಿಯಲ್ಲೂ ಅಧ್ಯಕ್ಷ ಮತ್ತು ಉಪಾಧ್ಯಕ್ಷ ಎರಡು ಸ್ಥಾನಗಳೂ ಬಿಜೆಪಿ ಬೆಂಬಲಿಗರ ಪಾಲಾಗಿವೆ.  
    ಮಾರಶೆಟ್ಟಿಹಳ್ಳಿ ಗ್ರಾಮ ಪಂಚಾಯಿತಿಯಲ್ಲಿ ಒಟ್ಟು ೧೪ ಸದಸ್ಯರಿದ್ದು, 'ಎ' ವರ್ಗ ಮಹಿಳೆಗೆ ಮೀಸಲಾದ ಅಧ್ಯಕ್ಷ ಸ್ಥಾನಕ್ಕೆ ಲಲಿತಮ್ಮ ಹೊನ್ನಪ್ಪ ಎಚ್. ಹಾಗು ಸಾಮಾನ್ಯ ವರ್ಗಕ್ಕೆ ಮೀಸಲಾದ ಉಪಾಧ್ಯಕ್ಷ ಸ್ಥಾನಕ್ಕೆ ಕಿರಣ್ ಮೋರೆ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಮೀನುಗಾರಿಕೆ ಇಲಾಖೆ ಸಹಾಯಕ ನಿರ್ದೇಶಕ ಗಣೇಶ್‌ರಾಜ್ ಚುನಾವಣಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸಿದರು. ಈ ಪಂಚಾಯಿತಿಯಲ್ಲಿ ಅಧ್ಯಕ್ಷ ಸ್ಥಾನ ಬಿಜೆಪಿ ಬೆಂಬಲಿಗರು ಮತ್ತು ಉಪಾಧ್ಯಕ್ಷ ಸ್ಥಾನ ಕಾಂಗ್ರೆಸ್ ಬೆಂಬಲಿಗರು ತಮ್ಮದಾಗಿಸಿಕೊಂಡಿದ್ದಾರೆ.
    ತಾಲೂಕಿನ ಮಾವಿನಕೆರೆ ಗ್ರಾಮ ಪಂಚಾಯಿತಿಯಲ್ಲಿ ಒಟ್ಟು ೧೦ ಸದಸ್ಯರಿದ್ದು, ಸಾಮಾನ್ಯ ವರ್ಗಕ್ಕೆ ಮೀಸಲಾದ ಅಧ್ಯಕ್ಷ ಸ್ಥಾನಕ್ಕೆ ಶ್ರೀಧರ ಶೆಟ್ಟಿ ಮತ್ತು 'ಎ' ವರ್ಗ ಮಹಿಳೆಗೆ ಮೀಸಲಾದ ಉಪಾಧ್ಯಕ್ಷ ಸ್ಥಾನಕ್ಕೆ ನೇತ್ರಾವತಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ತೋಟಗಾರಿಕೆ ಇಲಾಖೆ ಹಿರಿಯ ಸಹಾಯಕ ನಿರ್ದೇಶಕ ಕಾಂತರಾಜ್ ಚುನಾವಣಾಧಿಕಾರಿ ಕರ್ತವ್ಯ ನಿರ್ವಹಿಸಿದರು. ಈ ಪಂಚಾಯಿತಿಯಲ್ಲಿ ಶಾಸಕ ಬಿ.ಕೆ ಸಂಗಮೇಶ್ವರ್ ಮತ್ತು ಜಿ.ಪಂ. ಮಾಜಿ ಸದಸ್ಯ ಎಸ್. ಕುಮಾರ್ ಬೆಂಬಲಿಗರು ಅಧಿಕಾರ ಹಿಡಿಯುವಲ್ಲಿ ಯಶಸ್ವಿಯಾಗಿದ್ದಾರೆ.
ಅರಕೆರೆ ಗ್ರಾಮ ಪಂಚಾಯಿತಿಯಲ್ಲಿ ಒಟ್ಟು ೧೨ ಸದಸ್ಯರಿದ್ದು, 'ಎ' ವರ್ಗಕ್ಕೆ ಮೀಸಲಾದ ಅಧ್ಯಕ್ಷ ಸ್ಥಾನಕ್ಕೆ ಆರ್.ಡಿ ಶೇಖರಪ್ಪ ಮತ್ತು ಸಾಮಾನ್ಯ ಮಹಿಳೆಗೆ ಮೀಸಲಾದ ಉಪಾಧ್ಯಕ್ಷ ಸ್ಥಾನಕ್ಕೆ ಗಾಯಿತ್ರಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಮೀನುಗಾರಿಕೆ ಇಲಾಖೆ ಸಹಾಯಕ ನಿರ್ದೇಶಕ ಗಣೇಶ್‌ರಾಜ್ ಚುನಾವಣಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸಿದರು.

ರೋಟರಿ ಕ್ಲಬ್ ವತಿಯಿಂದ ಎಸ್‌ಎಸ್‌ಎಲ್‌ಸಿ ಮಕ್ಕಳಿಗೆ ಉಚಿತ ೨೦ ಟ್ಯಾಪ್ ವಿತರಣೆ

ಭದ್ರಾವತಿ ತಾಲೂಕಿನ ಕೂಡ್ಲಿಗೆರೆ ಗ್ರಾಮದ ಶ್ರೀ ಹರಿಹರೇಶ್ವರ ಪ್ರೌಢಶಾಲೆ ೧೦ನೇ ತರಗತಿ ಮಕ್ಕಳಿಗೆ ರೋಟರಿ ಕ್ಲಬ್ ವತಿಯಿಂದ ಉಚಿತವಾಗಿ ೨೦ ಟ್ಯಾಪ್‌ಗಳನ್ನು ಬುಧವಾರ ವಿತರಿಸಲಾಯಿತು.
    ಭದ್ರಾವತಿ, ಫೆ. ೧೦: ತಾಲೂಕಿನ ಕೂಡ್ಲಿಗೆರೆ ಗ್ರಾಮದ ಶ್ರೀ ಹರಿಹರೇಶ್ವರ ಪ್ರೌಢಶಾಲೆ ೧೦ನೇ ತರಗತಿ ಮಕ್ಕಳಿಗೆ ರೋಟರಿ ಕ್ಲಬ್ ವತಿಯಿಂದ ಉಚಿತವಾಗಿ ೨೦ ಟ್ಯಾಪ್‌ಗಳನ್ನು ಬುಧವಾರ ವಿತರಿಸಲಾಯಿತು.
ಶಾಲೆಯಲ್ಲಿ ಒಟ್ಟು ೪೦ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳಿದ್ದು, ತಲಾ ಇಬ್ಬರು ವಿದ್ಯಾರ್ಥಿಗಳಿಗೆ ಒಂದೊಂದು ಟ್ಯಾಪ್‌ಗಳಂತೆ ಒಟ್ಟು ೨೦ ಟ್ಯಾಪ್‌ಗಳನ್ನು ವಿತರಿಸುವ ಮೂಲಕ ಶಿಕ್ಷಣದಲ್ಲಿ ಪ್ರಗತಿ ಸಾಧಿಸುವಂತೆ ಕರೆ ನೀಡಲಾಯಿತು.
     ಕಾರ್ಯಕ್ರಮವನ್ನು ಹಟ್ಟಿ ಚಿನ್ನದ ಗಣಿ ನಿರ್ದೇಶಕ ಕೂಡ್ಲಿಗೆರೆ ಹಾಲೇಶ್ ಉದ್ಘಾಟಿಸಿದರು. ರೋಟರಿ ಕ್ಲಬ್ ಅಧ್ಯಕ್ಷ ಬಿ.ಎಂ ಶಾಂತಕುಮಾರ್ ಅಧ್ಯಕ್ಷತೆ ವಹಿಸಿದ್ದರು. ಕ್ಷೇತ್ರ ಶಿಕ್ಷಣಾಧಿಕಾರಿ ಟಿ.ಎನ್ ಸೋಮಶೇಖರಯ್ಯ, ರೋಟರಿ ಕ್ಲಬ್ ಅಸಿಸ್ಟೆಂಟ್ ಗವರ್ನರ್ ಎನ್.ಎಸ್ ಶ್ರೀಧರ್, ಡಿಎಲ್‌ಸಿಸಿ ಎಚ್.ಎಲ್ ರವಿ, ಜೋನಲ್ ಲೆಫ್ಟಿನೆಂಟ್ ಡಾ. ಕೆ. ನಾಗರಾಜ್, ಜೋನಲ್ ಟ್ರೈನರ್ ಜಿ. ವಿಜಯಕುಮಾರ್, ಶಿವಮೊಗ್ಗ ರೋಟರಿ ಕ್ಲಬ್ ಅಧ್ಯಕ್ಷ ಎಚ್.ಎಸ್ ಮೋಹನ್, ರವೀಂದ್ರನಾಥ ಐತಾಳ್, ಪ್ರಮುಖರಾದ ಸುಂದರ್‌ಬಾಬು, ಅಡವೀಶಯ್ಯ, ರಾಘವೇಂದ್ರ ಉಪಾಧ್ಯಾಯ, ಕಾರ್ಯದರ್ಶಿ ಎಂ.ಎನ್ ಗಿರೀಶ್, ಶಾಲೆಯ ಮುಖ್ಯೋಪಾಧ್ಯಾಯ ಸಿ. ಹರೀಶ್‌ಬಾಬು ಸೇರಿದಂತೆ ಗ್ರಾಮದ ಪ್ರಮುಖರು, ಶಿಕ್ಷಕ ಹಾಗು ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.