ಈ ಹಿಂದೆ ಭದ್ರಾವತಿ ತಾಲೂಕು ಪಂಚಾಯಿತಿ ಕಚೇರಿ ಮುಂಭಾಗದಲ್ಲಿದ್ದ ಬಸ್ ನಿಲ್ದಾಣವನ್ನು ಪುನಃ ನಿರ್ಮಿಸಬೇಕೆಂದು ಒತ್ತಾಯಿಸಿ ಕರ್ನಾಟಕ ರಕ್ಷಣಾ ವೇದಿಕೆ(ಪ್ರವೀಣ್‌ಕುಮಾರ್ ಶೆಟ್ಟಿ ಬಣ)ವತಿಯಿಂದ ಸೋಮವಾರ ತಾಲೂಕು ಆಡಳಿತಕ್ಕೆ ಮನವಿ ಸಲ್ಲಿಸಲಾಯಿತು.
ಭದ್ರಾವತಿ, ಮಾ. ೨೯: ಈ ಹಿಂದೆ ತಾಲೂಕು ಪಂಚಾಯಿತಿ ಕಚೇರಿ ಮುಂಭಾಗದಲ್ಲಿದ್ದ ಬಸ್ ನಿಲ್ದಾಣವನ್ನು ಪುನಃ ನಿರ್ಮಿಸಬೇಕೆಂದು ಒತ್ತಾಯಿಸಿ ಕರ್ನಾಟಕ ರಕ್ಷಣಾ ವೇದಿಕೆ(ಪ್ರವೀಣ್‌ಕುಮಾರ್ ಶೆಟ್ಟಿ ಬಣ)ವತಿಯಿಂದ ಸೋಮವಾರ ತಾಲೂಕು ಆಡಳಿತಕ್ಕೆ ಮನವಿ ಸಲ್ಲಿಸಲಾಯಿತು.
ತಹಸೀಲ್ದಾರ್ ಗ್ರೇಡ್-೨ ರಂಗಮ್ಮರಿಗೆ ಮನವಿ ಸಲ್ಲಿಸಿದ ವೇದಿಕೆ ತಾಲೂಕು ಅಧ್ಯಕ್ಷ ಬಿ.ವಿ ಗಿರೀಶ್, ನಗರದ ಪ್ರಮುಖ ರಸ್ತೆಗಳಲ್ಲಿ ಒಂದಾಗಿರುವ ತಾಲೂಕು ಕಚೇರಿ ರಸ್ತೆಯಲ್ಲಿ ಪ್ರತಿದಿನ ನಗರ ಹಾಗು ಗ್ರಾಮಾಂತರ ಭಾಗಗಳಿಂದ ಜನರು ಬಂದು ಹೋಗುತ್ತಾರೆ. ಈ ಹಿಂದೆ ನಿರ್ಮಿಸಲಾಗಿದ್ದ ಬಸ್ ನಿಲ್ದಾಣವನ್ನು ರಸ್ತೆ ಅಗಲೀಕರಣಕ್ಕಾಗಿ ನೆಲಸಮಗೊಳಿಸಲಾಗಿದೆ. ಅಲ್ಲದೆ ಈ ರಸ್ತೆಯಲ್ಲಿ ಸದಾ ಕಾಲ ಗಾಳಿ, ನೆರಳು ನೀಡುತ್ತಿದ್ದ ಹಳೇಯದಾದ ಬೃಹತ್ ಗಾತ್ರದ ಮರಗಳನ್ನು ಸಹ ಕಡಿತಲೆ ಮಾಡಲಾಗಿದೆ. ಇದೀಗ ರಸ್ತೆ ಕಾಮಗಾರಿ ಪೂರ್ಣಗೊಂಡಿದ್ದರೂ ಸಹ ಪುನಃ ಬಸ್ ನಿಲ್ದಾಣ ನಿರ್ಮಿಸಿಲ್ಲ. ಇದರಿಂದಾಗಿ ಸಾರ್ವಜನಿಕರು ತೊಂದರೆ ಅನುಭವಿಸುವಂತಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ತಕ್ಷಣ ಬಸ್ ನಿಲ್ದಾಣ ನಿರ್ಮಿಸಬೇಕು. ಸಾರ್ವಜನಿಕರಿಗೆ ಉಂಟಾಗುತ್ತಿರುವ ತೊಂದರೆ ತಪ್ಪಿಸಬೇಕು. ಇಲ್ಲವಾದಲ್ಲಿ ಮುಂದಿನ ದಿನಗಳಲ್ಲಿ ಉಗ್ರ ಹೋರಾಟ ನಡೆಸುವುದಾಗಿ ಎಚ್ಚರಿಸಿದರು.
ಸಾಮಾಜಿಕ ಹೋರಾಟಗಾರ ಶಿವಕುಮಾರ್, ಹಿರಿಯ ಮುಖಂಡ ಸುಬ್ಬೇಗೌಡ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.