ಭದ್ರಾವತಿಯಲ್ಲಿ ತಾಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ಡಾ. ಬಿ.ಆರ್ ಅಂಬೇಡ್ಕರ್‌ರವರ ೧೩೦ನೇ ಜನ್ಮದಿನ ಕಾರ್ಯಕ್ರಮದಲ್ಲಿ ಹೊಸಮನೆ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲ ಡಾ. ಬಿ.ಜಿ ಧನಂಜಯರನ್ನು ಸನ್ಮಾನಿಸಲಾಯಿತು.
ಭದ್ರಾವತಿ, ಏ. ೧೪: ಭಾರತರತ್ನ, ಸಂವಿಧಾನ ಶಿಲ್ಪಿ ಡಾ. ಬಾಬಾ ಸಾಹೇಬ್ ಅಂಬೇಡ್ಕರ್‌ರವರು ಸಾಮಾಜಿಕ ಹೋರಾಟದ ಜಾಗೃತಿ ಸಂಕೇತವಾಗಿದ್ದು, ಅವರ ಆಶಯದಂತೆ ನಾವೆಲ್ಲರೂ ಮುನ್ನಡೆಯಬೇಕಾಗಿದೆ ಎಂದು ಹೊಸಮನೆ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲ ಡಾ. ಬಿ.ಜಿ ಧನಂಜಯ ತಿಳಿಸಿದರು.
ಅವರು ಬುಧವಾರ ತಾಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ಡಾ. ಬಿ.ಆರ್ ಅಂಬೇಡ್ಕರ್‌ರವರ ೧೩೦ನೇ ಜನ್ಮದಿನ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದರು.
ದೇಶದಲ್ಲಿ ಚಳುವಳಿಗಳನ್ನು ಹುಟ್ಟು ಹಾಕುವ ಮೂಲಕ ಚಳುವಳಿಗಳಿಗೆ ಒಂದು ರೂಪುರೇಷೆ ಕೊಟ್ಟವರು ಅಂಬೇಡ್ಕರ್. ಅವರು ಚಳುವಳಿಗಳು ಯಾವ ದಿಕ್ಕಿನಲ್ಲಿ ಸಾಗಬೇಕೆಂಬುದನ್ನು ತೋರಿಸಿಕೊಟ್ಟಿದ್ದರು. ಆದರೆ ಇಂದು ಚಳುವಳಿಗಳು ಯಾವ ದಿಕ್ಕಿನಲ್ಲಿ ಸಾಗಬೇಕೆಂಬುದು ತಿಳಿಯದೆ ಗೊಂದಲದ ಗೂಡಾಗಿ ಪರಿಣಮಿಸುತ್ತಿವೆ. ಚಳುವಳಿಗಳು ತಮ್ಮ ಮಹತ್ವ ಕಳೆದುಕೊಳ್ಳುತ್ತಿವೆ ಎಂದು ವಿಷಾದ ವ್ಯಕ್ತಪಡಿಸಿದರು.
ಅಂಬೇಡ್ಕರ್‌ರವರು ಮನುಕುಲದ ಮಹಾನ್ ನಾಯಕರಾಗಿದ್ದು, ಅವರ ವಿಚಾರಧಾರೆಗಳು ಅಪರೂಪದಲ್ಲಿ ಅಪರೂಪ. ಶೋಷಣೆ ಮುಕ್ತ, ಸರ್ವ ಸಮಾನತೆ ಸಮಾಜ ನಿರ್ಮಾಣ ಇವರ ಆಶಯವಾಗಿತ್ತು. ದೇಶದಲ್ಲಿ ಸಾಮಾಜಿಕ ಸಮಾನತೆ ಜೊತೆಗೆ ನ್ಯಾಯಾಂಗ, ಶಾಸಕಾಂಗ ಮತ್ತು ಕಾರ್ಯಾಂಗಗಳ ಮೂಲಕ ಉತ್ತಮ ಆಡಳಿತ ವ್ಯವಸ್ಥೆಯ ಪ್ರಜಾಪ್ರಭುತ್ವ ರಾಷ್ಟ್ರ ನಿರ್ಮಾಣ ಇವರ ಬಹುದೊಡ್ಡ ಕೊಡುಗೆಯಾಗಿದೆ ಎಂದರು.
ತಹಸೀಲ್ದಾರ್ ಜಿ. ಸಂತೋಷ್‌ಕುಮಾರ್ ಅಧ್ಯಕ್ಷತೆ ವಹಿಸಿದ್ದರು. ತಾಲೂಕು ಪಂಚಾಯಿತಿ ಅಧ್ಯಕ್ಷೆ ಡಿ. ಲಕ್ಷ್ಮೀದೇವಿ, ಸಾಮಾಜಿಕ ನ್ಯಾಯ ಸಮಿತಿ ಅಧ್ಯಕ್ಷ ನಾಗರಾಜ್, ಕಾರ್ಯನಿರ್ವಹಣಾಧಿಕಾರಿ ರಮೇಶ್, ಕ್ಷೇತ್ರ ಶಿಕ್ಷಣಾಧಿಕಾರಿ ಟಿ.ಎನ್ ಸೋಮಶೇಖರಯ್ಯ, ನಗರಸಭೆ ಪೌರಾಯುಕ್ತ ಮಹೋಹರ್, ತಾಲೂಕು ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಎನ್. ಕೃಷ್ಣಪ್ಪ, ತಹಸೀಲ್ದಾರ್ ಗ್ರೇಡ್-೨ ರಂಗಪ್ಪ ಸೇರಿದಂತೆ ಇನ್ನಿತರರು ವೇದಿಕೆಯಲ್ಲಿ ಉಪಸ್ಥಿತರಿದ್ದರು.