Saturday, May 29, 2021

ಕಲ್ಲಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಕೊರೋನಾ ಕುರಿತು ಜಾಗೃತಿ ಜಾಥಾ



ಭದ್ರಾವತಿ ತಾಲೂಕಿನ ಕಲ್ಲಹಳ್ಳಿ ಗ್ರಾಮ ಪಂಚಾಯಿತಿ ಕೋವಿಡ್ ಕಾರ್ಯಪಡೆ ವತಿಯಿಂದ ಕೊರೋನಾ ಕುರಿತು ಗ್ರಾಮಸ್ಥರಲ್ಲಿ ಜಾಗೃತಿ ಮೂಡಿಸಲಾಯಿತು.
   ಭದ್ರಾವತಿ, ಮೇ. ೨೯: ತಾಲೂಕಿನ ಕಲ್ಲಹಳ್ಳಿ ಗ್ರಾಮ ಪಂಚಾಯಿತಿ ಕೋವಿಡ್ ಕಾರ್ಯಪಡೆ ವತಿಯಿಂದ ಕೊರೋನಾ ಕುರಿತು ಗ್ರಾಮಸ್ಥರಲ್ಲಿ ಜಾಗೃತಿ ಮೂಡಿಸಲಾಯಿತು.
ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕಲ್ಲಹಳ್ಳಿ, ಸಿರಿಯೂರು ತಾಂಡ, ವೀರಾಪುರ, ರಾಮನಕೊಪ್ಪ, ಸಂಕ್ಲಿಪುರ, ಹಾಗಲಮನೆ ಸೇರಿದಂತೆ ಇನ್ನಿತರ ಗ್ರಾಮಗಳಲ್ಲಿ ಜಾಥಾ ನಡೆಸುವ ಮೂಲಕ ಕೊರೋನಾ ಕುರಿತು ಜಾಗೃತಿ ಮೂಡಿಸಲಾಯಿತು.
    ಗ್ರಾಮ ಪಂಚಾಯಿತಿ ಅಧ್ಯಕ್ಷೆ ಮಂಜುಳ, ಉಪಾಧ್ಯಕ್ಷ ಬಿ. ಆನಂದ, ಸದಸ್ಯರಾದ ಕೆ.ವಿ ಧನಂಜಯ, ಪುನೀತ್‌ಕುಮಾರ್, ಆರ್. ಧರ್ಮಪ್ಪ, ಶೋಭಾ ಬಾಯಿ, ಸುಭದ್ರಾ ಬಾಯಿ, ಗಾಯಿತ್ರಿ, ಉಮೇಶ್, ಅಭಿವೃದ್ಧಿ ಅಧಿಕಾರಿ ಸಿ. ಕುಮಾರ್, ಗ್ರಾಮಲೆಕ್ಕಿಗ ಎಸ್.ಎಂ ಶಿವಣ್ಣ, ಅಂಗನವಾಡಿ ಮತ್ತು ಆಶಾ ಕಾರ್ಯಕರ್ತೆಯರು, ಆರೋಗ್ಯ ಇಲಾಖೆ ಮತ್ತು ಗ್ರಾಮ ಪಂಚಾಯಿತಿ ಸಿಬ್ಬಂದಿಗಳು ಸೇರಿದಂತೆ ಇನ್ನಿತರರು ಜಾಥಾದಲ್ಲಿ ಪಾಲ್ಗೊಂಡಿದ್ದರು.

ಶ್ರೀ ವಿನಾಯಕ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಉಚಿತ ಅಂಬ್ಯುಲೆನ್ಸ್ ಸೇವೆ

ಶ್ರೀ ವಿನಾಯಕ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಭದ್ರಾವತಿಯಲ್ಲಿ ಕೊರೋನಾ ಸೋಂಕಿತರಿಗಾಗಿ ಉಚಿತ ಅಂಬ್ಯುಲೆನ್ಸ್ ವ್ಯವಸ್ಥೆ ಕಲ್ಪಿಸಲಾಗಿದ್ದು, ತಹಸೀಲ್ದಾರ್ ಜಿ. ಸಂತೋಷ್‌ಕುಮಾರ್ ಸೇವಾ ಕಾರ್ಯಕ್ಕೆ ಚಾಲನೆ ನೀಡಿದರು.
   ಭದ್ರಾವತಿ, ಮೇ. ೨೯: ಕಳೆದ ೩ ವರ್ಷಗಳಿಂದ ಹಲವು ಸೇವಾ ಕಾರ್ಯಗಳಲ್ಲಿ ತೊಡಗಿಸಿಕೊಂಡಿರುವ ಶ್ರೀ ವಿನಾಯಕ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಕೊರೋನಾ ಸೋಂಕಿತರಿಗಾಗಿ ಉಚಿತ ಅಂಬ್ಯುಲೆನ್ಸ್ ವ್ಯವಸ್ಥೆ ಕಲ್ಪಿಸಲಾಗಿದೆ.
    ಈ ಕುರಿತು ಪತ್ರಿಕೆಯೊಂದಿಗೆ ಮಾತನಾಡಿದ ಟ್ರಸ್ಟ್ ಅಧ್ಯಕ್ಷ ಎ. ಧಮೇಂದ್ರ, ಎಲ್ಲೆಡೆ ಕೊರೋನಾ ಸೋಂಕು ವ್ಯಾಪಕವಾಗಿ ಹರಡುತ್ತಿದೆ. ಸಾವಿನ ಸಂಖ್ಯೆ ಹೆಚ್ಚುತ್ತಿದ್ದು, ಅಲ್ಲದೆ ಹಲವು ಸಂಕಷ್ಟಗಳು ಎದುರಾಗಿವೆ. ಇಂತಹ ಸಂದರ್ಭದಲ್ಲಿ ಟ್ರಸ್ಟ್ ವತಿಯಿಂದ ಉಚಿತ ಅಂಬ್ಯುಲೆನ್ಸ್ ವ್ಯವಸ್ಥೆಯನ್ನು ಸಂಕಷ್ಟದಲ್ಲಿರುವವರಿಗೆ ಕಲ್ಪಿಸಿಕೊಡಲಾಗುತ್ತಿದೆ. ತಾಲೂಕಿನಾದ್ಯಂತ ಸೇವೆ ಒಂದಗಿಸಲಿದ್ದು, ಇದರ ಸದುಪಯೋಗ ಪಡೆದುಕೊಳ್ಳಬೇಕೆಂದು ಮನವಿ ಮಾಡಿದರು.
    ಕಳೆದ ೩ ವರ್ಷಗಳಿಂದ ಟ್ರಸ್ಟ್ ವತಿಯಿಂದ ಶಾಲಾ ಮಕ್ಕಳಿಗೆ ಉಚಿತ ನೋಟ್ ಪುಸ್ತಕಗಳು ವಿತರಿಸಲಾಗುತ್ತಿದೆ. ಸೋಮವಾರದಿಂದ ಸಂಕಷ್ಟದಲ್ಲಿರುವ ಬಡವರಿಗೆ ದಿನಸಿ ಸಾಮಗ್ರಿಗಳನ್ನು ವಿತರಿಸಲಾಗುವುದು. ಮುಂದಿನ ದಿನಗಳಲ್ಲಿ ಇನ್ನೂ ಹಲವು ಸೇವಾ ಕಾರ್ಯಗಳನ್ನು ಕೈಗೊಳ್ಳುವ  ಗುರಿ ಹೊಂದಲಾಗಿದೆ. ಉಚಿತ ಅಂಬ್ಯುಲೆನ್ಸ್ ಸೇವೆ ಬಯಸುವವರು ಮೊಬೈಲ್ : ೭೦೧೯೬೯೨೮೪೬ ಸಂಖ್ಯೆಗೆ ಕರೆಮಾಡಬಹುದಾಗಿದೆ ಎಂದರು.
     ಅಂಬ್ಯುಲೆನ್ಸ್ ಸೇವಾ ಕಾರ್ಯಕ್ಕೆ ತಹಸೀಲ್ದಾರ್ ಜಿ. ಸಂತೋಷ್‌ಕುಮಾರ್ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ತಹಸೀಲ್ದಾರ್ ಗ್ರೇಡ್-೨ ರಂಗಮ್ಮ, ಉಪತಹಸೀಲ್ದಾರ್‌ಗಳಾದ ಮಂಜಾನಾಯ್ಕ್, ಮಲ್ಲಿಕಾರ್ಜುನಯ್ಯ, ಟ್ರಸ್ಟ್ ಸೇವಾಕರ್ತರು ಹಾಗು ಇನ್ನಿತರರು ಉಪಸ್ಥಿತರಿದ್ದರು.

ಎಂಪಿಎಂ ಕಾಯಂ ಉದ್ಯೋಗಿಗಳಿಗೆ, ಭದ್ರತಾ ಸಿಬ್ಬಂದಿಗಳಿಗೆ ವೇತನ ನೀಡಿ

ಕಾರ್ಖಾನೆ ವ್ಯವಸ್ಥಾಪಕ ನಿರ್ದೇಶಕರಾದ ಜಿಲ್ಲಾಧಿಕಾರಿಗಳಿಗೆ ನೂತನ ನಗರಸಭಾ ಸದಸ್ಯ ಬಸವರಾಜ ಬಿ. ಆನೆಕೊಪ್ಪ ಮನವಿ



ರಾಜ್ಯ ಸರ್ಕಾರಿ ಸ್ವಾಮ್ಯದ ಭದ್ರಾವತಿ ಮೈಸೂರು ಕಾಗದ ಕಾರ್ಖಾನೆಯಲ್ಲಿ ಪ್ರಸ್ತುತ ಕರ್ತವ್ಯ ನಿರ್ವಹಿಸುತ್ತಿರುವ ಕಾಯಂ ಉದ್ಯೋಗಿಗಳಿಗೆ ಹಾಗು ಭದ್ರತಾ ವಿಭಾಗದ ಸಿಬ್ಬಂದಿಗಳಿಗೆ ತಕ್ಷಣ ವೇತನ ಬಿಡುಗಡೆಗೊಳಿಸುವಂತೆ ನಗರಸಭೆ ೧೯ನೇ ವಾರ್ಡ್‌ನ ನೂತನ ಸದಸ್ಯ ಬಸವರಾಜ ಬಿ. ಆನೆಕೊಪ್ಪ ಕಾರ್ಖಾನೆಯ ವ್ಯವಸ್ಥಾಪಕ ನಿರ್ದೇಶಕರಾದ ಜಿಲ್ಲಾಧಿಕಾರಿ ಕೆ.ಬಿ ಶಿವಕುಮಾರ್‌ಗೆ ಒತ್ತಾಯಿಸಿದರು.
   ಭದ್ರಾವತಿ, ಮೇ. ೨೯: ರಾಜ್ಯ ಸರ್ಕಾರಿ ಸ್ವಾಮ್ಯದ ಮೈಸೂರು ಕಾಗದ ಕಾರ್ಖಾನೆಯಲ್ಲಿ ಪ್ರಸ್ತುತ ಕರ್ತವ್ಯ ನಿರ್ವಹಿಸುತ್ತಿರುವ ಕಾಯಂ ಉದ್ಯೋಗಿಗಳಿಗೆ ಹಾಗು ಭದ್ರತಾ ವಿಭಾಗದ ಸಿಬ್ಬಂದಿಗಳಿಗೆ ತಕ್ಷಣ ವೇತನ ಬಿಡುಗಡೆಗೊಳಿಸುವಂತೆ ನಗರಸಭೆ ೧೯ನೇ ವಾರ್ಡ್‌ನ ನೂತನ ಸದಸ್ಯ ಬಸವರಾಜ ಬಿ. ಆನೆಕೊಪ್ಪ ಕಾರ್ಖಾನೆಯ ವ್ಯವಸ್ಥಾಪಕ ನಿರ್ದೇಶಕರಾದ ಜಿಲ್ಲಾಧಿಕಾರಿ ಕೆ.ಬಿ ಶಿವಕುಮಾರ್‌ಗೆ ಒತ್ತಾಯಿಸಿದರು.
    ಶನಿವಾರ ನಗರದ ಉಜ್ಜನಿಪುರ ನಗರ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಭೇಟಿ ನೀಡಿದ್ದ ವ್ಯವಸ್ಥಾಪಕ ನಿರ್ದೇಶಕರ ಜೊತೆ ಮಾತನಾಡಿದ ಬಸವರಾಜ್, ಕಳೆದ ಹಲವು ತಿಂಗಳಿಂದ ಕಾಯಂ ಉದ್ಯೋಗಿಗಳು, ಭದ್ರತಾ ವಿಭಾಗದ ಸಿಬ್ಬಂದಿಗಳು ವೇತನವಿಲ್ಲದೆ ಸಂಕಷ್ಟಕ್ಕೆ ಒಳಗಾಗಿದ್ದಾರೆ. ಪ್ರಸ್ತುತ ಕೊರೋನಾ ಸಂದರ್ಭದಲ್ಲಿ ಮತ್ತಷ್ಟು ಸಂಕಷ್ಟಕ್ಕೆ ಒಳಗಾಗಿದ್ದಾರೆ. ಈ ಹಿನ್ನೆಯಲ್ಲಿ  ತಕ್ಷಣ ವೇತನ ಬಿಡುಗಡೆಗೊಳಿಸಬೇಕೆಂದು ಮನವಿ ಮಾಡಿದವು.
   ಪ್ರಸ್ತುತ ಉಜ್ಜನಿಪುರ ನಗರ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಕೊರೋನಾ ಲಸಿಕೆ ಹಾಕಲಾಗುತ್ತಿದ್ದು, ಈ ಕೇಂದ್ರದಲ್ಲಿ ಲಸಿಕೆ ಹಾಕಿಸಿಕೊಳ್ಳುವವರ ಸಂಖ್ಯೆ ಹೆಚ್ಚಾಗುತ್ತಿದೆ. ಇದರಿಂದ ಜನಸಂದಣಿ ಉಂಟಾಗುತ್ತಿದ್ದು, ಇದನ್ನು ತಪ್ಪಿಸಲು ಎಂಪಿಎಂ ಆಸ್ಪತ್ರೆಯಲ್ಲಿ ಹೆಚ್ಚುವರಿ ಲಸಿಕಾ ಕೇಂದ್ರ ತೆರೆಯಬೇಕು. ಇದರಿಂದ ಕಾಗದನಗರ, ಆನೆಕೊಪ್ಪ, ಜೆಪಿಎಸ್ ಕಾಲೋನಿ, ಸುರಗಿತೋಪು ಸೇರಿದಂತೆ ಸುತ್ತಮುತ್ತಲ ನಿವಾಸಿಗಳಿಗೆ ಅನುಕೂಲವಾಗಲಿದೆ ಎಂದು ಮನವರಿಕೆ ಮಾಡಿದರು.  
       ಕೋವಿಡ್ ನಿಷೇಧಿತ ವಲಯ, ಆರೈಕೆ ಹಾಗು ತಪಾಸಣಾ ಕೇಂದ್ರಗಳಿಗೆ ಭೇಟಿ:
   ಜಿಲ್ಲಾಧಿಕಾರಿ ಕೆ.ಬಿ ಶಿವಕುಮಾರ್ ತಾಲೂಕಿನಲ್ಲಿ ಕೊರೋನಾ ಸೋಂಕು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿರುವ ಹಿನ್ನಲೆಯಲ್ಲಿ ಶನಿವಾರ ನಗರದ ವಿವಿಧೆಡೆ ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ, ಕೋವಿಡ್ ನಿಷೇಧಿತ ವಲಯಗಳಿಗೆ ಹಾಗು ಆರೈಕೆ ಕೇಂದ್ರಗಳಿಗೆ ಭೇಟಿ ಪರಿಶೀಲನೆ ನಡೆಸಿದರು.
   ಕೊರೋನಾ ಸೋಂಕು ಹರಡದಂತೆ ಹೆಚ್ಚಿನ ಮುಂಜಾಗ್ರತೆ ವಹಿಸುವ ಜೊತೆಗೆ ನಗರ ಹಾಗು ಗ್ರಾಮಾಂತರ ಭಾಗದಲ್ಲಿ ಕೊರೋನಾ ಕುರಿತು ವ್ಯಾಪಕ ಪ್ರಚಾರ ನಡೆಸುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಿದರು.
   ತಹಸೀಲ್ದಾರ್ ಜಿ. ಸಂತೋಷ್‌ಕುಮಾರ್, ತಾಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ರಮೇಶ್, ತಾಲೂಕು ಆರೋಗ್ಯಾಧಿಕಾರಿ ಡಾ.ಎಂ.ವಿ ಅಶೋಕ್, ನಗರಸಭೆ ಪೌರಾಯುಕ್ತ ಪರಮೇಶ್, ಕಂದಾಯಾಧಿಕಾರಿ ರಾಜ್‌ಕುಮಾರ್, ಪರಿಸರ ಅಭಿಯಂತರ ಪ್ರಭಾಕರ್, ಗ್ರಾಮಾಂತರ ಪೊಲೀಸ್ ವೃತ್ತ ನಿರೀಕ್ಷಕ ಇ.ಓ ಮಂಜುನಾಥ್, ಸ್ಥಳೀಯ ಮುಖಂಡ ವೆಂಕಟೇಶ್ ಉಜ್ಜನಿಪುರ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

ಈ ತಿಂಗಳ ಅಂತ್ಯದೊಳಗೆ ಶಾಸಕರ ಅನುದಾನದಲ್ಲಿ ಆಕ್ಸಿಜನ್ ಪ್ಲಾಂಟ್ ನಿರ್ಮಾಣ : ಬಿ.ಕೆ ಸಂಗಮೇಶ್ವರ್

ಭದ್ರಾವತಿ ನಗರಸಭೆ ಸಭಾಂಗಣದಲ್ಲಿ ಶನಿವಾರ ಶಾಸಕರ ನೇತೃತ್ವದಲ್ಲಿ ಸುದ್ದಿಗೋಷ್ಠಿ ನಡೆಯಿತು.
     ಭದ್ರಾವತಿ, ಮೇ. ೨೯: ಶಾಸಕರ ಅನುದಾನದ ಒಂದು ಕೋಟಿ ರು. ವೆಚ್ಚದಲ್ಲಿ ಹಳೇನಗರದ ತಾಲೂಕು ಸಾರ್ವಜನಿಕ ಸರ್ಕಾರಿ ಆಸ್ಪತ್ರೆ ಆವರಣದಲ್ಲಿ ಆಕ್ಸಿಜನ್ ಪ್ಲಾಂಟ್ ನಿರ್ಮಾಣ ಮಾಡಲು ಜಾಗ ಗುರುತಿಸಿದ್ದು, ಈ ತಿಂಗಳ ಅಂತ್ಯದೊಳಗೆ ಆಕ್ಸಿಜನ್ ಉತ್ಪಾದನೆ ನಡೆಯಲಿದೆ ಎಂದು ಶಾಸಕ ಬಿ.ಕೆ ಸಂಗಮೇಶ್ವರ್ ತಿಳಿಸಿದರು.
   ಅವರು ಶನಿವಾರ ನಗರಸಭೆ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು. ನೂತನ ಆಕ್ಸಿಜನ್ ಪ್ಲಾಂಟ್‌ನಲ್ಲಿ  ಒಂದು ನಿಮಿಷಕ್ಕೆ ೪೦೦ ಲೀಟರ್ ಗಾಳಿಯಿಂದ ಆಮ್ಲಜನಕ ಉತ್ಪಾದನೆಯಾಗಲಿದೆ. ಇದರಿಂದ ತಕ್ಷಣಕ್ಕೆ ಆಕ್ಸಿಜನ್ ಕೊರತೆ ಎದುರಾಗುವುದಿಲ್ಲ. ಈಗಾಗಲೇ ಆಸ್ಪತ್ರೆಯಲ್ಲಿ ಆಕ್ಸಿಜನ್ ಒಳಗೊಂಡ ೫೦ ಹಾಸಿಗೆಗಳಿದ್ದು, ಇದರ ಜೊತೆಗೆ ಇದೀಗ ೨೫ ಲಕ್ಷ ರು. ಶಾಸಕರ ಅನುದಾನದಲ್ಲಿ ಹೊಸದಾಗಿ ಆಕ್ಸಿಜನ್ ಒಳಗೊಂಡ ೫೦ ಹಾಸಿಗೆಗಳನ್ನು ನಿರ್ಮಾಣ ಮಾಡಲಾಗುತ್ತಿದೆ. ಪ್ರಸ್ತುತ ಆಸ್ಪತ್ರೆಯಲ್ಲಿ ಐಸಿಯು ಒಳಗೊಂಡ ೩ ಹಾಸಿಗೆಗಳಿದ್ದು, ಇದನ್ನು ೧೦ ಹಾಸಿಗೆಗಳಿಗೆ ಹೆಚ್ಚಳ ಮಾಡಲಾಗುವುದು ಎಂದರು.
     ಈಗಾಗಲೇ ನಗರದ ಎಂಪಿಎಂ ಕಲ್ಯಾಣ ಮಂಟಪದಲ್ಲಿ ೧೦೦ ಹಾಸಿಗೆಗಳ ಕೋವಿಡ್ ಆರೈಕೆ ಕೇಂದ್ರ ನಿರ್ಮಿಸಲಾಗಿದ್ದು, ಸರ್ಕಾರ ಇದೀಗ ಮನೆಗಳಲ್ಲಿಯೇ ಚಿಕಿತ್ಸೆ ಪಡೆಯುವ ವಿಧಾನವನ್ನು ಬದಲಿಸಿದೆ. ಇದರಿಂದ ಕೋವಿಡ್ ಆರೈಕೆ ಕೇಂದ್ರಕ್ಕೆ ದಾಖಲಾಗುತ್ತಿರುವವರ ಸಂಖ್ಯೆ ಹೆಚ್ಚಾಗುತ್ತಿದೆ. ಈ ಹಿನ್ನಲೆಯಲ್ಲಿ ತಾಲೂಕಿನ ದೇವರ ನರಸೀಪುರ ಮೊರಾರ್ಜಿ ವಸತಿ ಶಾಲೆಯಲ್ಲಿ ೧೬೦ ಹಾಸಿಗೆಯುಳ್ಳ ಆರೈಕೆ ಕೇಂದ್ರ ನಿರ್ಮಾಣ ಮಾಡಲಾಗಿದೆ.  ಈ ಕೇಂದ್ರ ಭಾನುವಾರದಿಂದಲೇ ಕಾರ್ಯಾರಂಭ ಮಾಡಲಿದೆ. ಪ್ರಸ್ತುತ ದಾಖಲಾಗುವವರನ್ನು ಈ ಕೇಂದ್ರಕ್ಕೆ ಕಳುಹಿಸಿಕೊಡಲಾಗುವುದು. ಮುಂದಿನ ದಿನಗಳಲ್ಲಿ ತಾಲೂಕಿನ ದೊಡ್ಡೇರಿ ಗ್ರಾಮದಲ್ಲಿರುವ ಮೊರಾರ್ಜಿ ವಸತಿ ಶಾಲೆಯಲ್ಲೂ ಆರೈಕೆ ಕೇಂದ್ರ ತೆರೆಯಲಾಗುವುದು ಎಂದರು.
       ನಗರ ವ್ಯಾಪ್ತಿಯಲ್ಲಿ ಕೊರೋನಾ ಇಳಿಮುಖ:
   ನಗರ ವ್ಯಾಪ್ತಿಯಲ್ಲಿ ಕೊರೋನಾ ಸೋಂಕು ಇಳಿಮುಖವಾಗುತ್ತಿದೆ. ಈ ವ್ಯಾಪ್ತಿಯಲ್ಲಿ ಎಲ್ಲಾ ಇಲಾಖೆಗಳು ಉತ್ತಮವಾಗಿ ಕರ್ತವ್ಯ ನಿರ್ವಹಿಸುತ್ತಿವೆ ಎಂದರು ಪ್ರಶಂಸೆ ವ್ಯಕ್ತಪಡಿಸಿದರು.
   ಗ್ರಾಮಾಂತರ ಭಾಗದಲ್ಲಿ ಸೋಂಕು ಹೆಚ್ಚಳವಾಗುತ್ತಿದ್ದು, ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು, ಸಿಬ್ಬಂದಿಗಳು ಸರಿಯಾಗಿ ಕರ್ತವ್ಯ ನಿರ್ವಹಿಸುತ್ತಿಲ್ಲ. ಸೋಂಕು ನಿಯಂತ್ರಣಕ್ಕೆ ಯಾವುದೇ ಕಠಿಣ ಕ್ರಮಗಳನ್ನು ಕೈಗೊಳ್ಳುತ್ತಿಲ್ಲ. ಅಲ್ಲದೆ ಸ್ಯಾನಿಟೈಜರ್ ಸೇರಿದಂತೆ ಇನ್ನಿತರ ಮುಂಜಾಗ್ರತೆ ಕ್ರಮಗಳನ್ನು ಕೈಗೊಳ್ಳುವಲ್ಲಿ ವಿಫಲರಾಗಿದ್ದಾರೆಂದು ಅಸಮಾಧಾನ ವ್ಯಕ್ತಪಡಿಸಿದರು. ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು, ಸಿಬ್ಬಂದಿಗಳು ಬದಲಾಗದಿದ್ದಲ್ಲಿ ಅವರ ವಿರುದ್ಧ ಮೇಲಾಧಿಕಾರಿಗಳಿಗೆ ಪತ್ರ ಬರೆದು ಕಠಿಣ ಕ್ರಮಕ್ಕೆ ಆಗ್ರಹಿಸಲಾಗುವುದು ಎಂದು ಎಚ್ಚರಿಸಿದರು.
     ಶಿವಮೊಗ್ಗ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಇಂಜಿನಿಯರ್ ರವಿಕಿರಣ್, ನಗರಸಭೆ ವ್ಯವಸ್ಥಾಪಕಿ ಸುನಿತಾಕುಮಾರಿ, ನಗರಸಭೆ ಅಧಿಕಾರಿಗಳು, ಸಿಬ್ಬಂದಿಗಳು, ನೂತನ ಸದಸ್ಯರು, ಎರೆಹಳ್ಳಿ ಗ್ರಾಮ ಪಂಚಾಯಿತಿ ಸದಸ್ಯರು ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

ಬಾರಂದೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಹೆಚ್ಚಿದ ಸೋಂಕು : ಸ್ಥಳೀಯರಲ್ಲಿ ಆತಂಕ, ನಿರ್ಬಂಧದ ಶಿಕ್ಷೆ




ಭದ್ರಾವತಿ, ಮೇ. ೨೯: ತಾಲೂಕಿನ ಬಾರಂದೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಶುಕ್ರವಾರ ಒಂದೇ ದಿನ ೧೩ ಸೋಂಕು ಪ್ರಕರಣಗಳು ಪತ್ತೆಯಾದ ಹಿನ್ನಲೆಯಲ್ಲಿ ಗ್ರಾಮ ಪಂಚಾಯಿತಿ ಕೋವಿಡ್ ಕಾರ್ಯ ಪಡೆ ವತಿಯಿಂದ ಎ.ಕೆ ಕಾಲೋನಿ ಬ್ಯಾಂಕ್ ರಸ್ತೆಯನ್ನು ಸೀಲ್‌ಡೌನ್ ಮಾಡಲಾಗಿದೆ. ಇದರಿಂದಾಗಿ ಇಲ್ಲಿನ ನಿವಾಸಿಗಳು ಆತಂಕದಲ್ಲಿ ಬದುಕು ಸಾಗಿಸುವಂತಾಗಿದೆ. ಅಂಗಡಿ ಮುಂಗಟ್ಟುಗಳಿಂದ ನಿರ್ಬಂಧದ ಶಿಕ್ಷೆ ಎದುರುವಂತಾಗಿದೆ. 
    ಗ್ರಾಮ ಪಂಚಾಯಿತಿ ವ್ಯಾಪ್ತಿಯ ಎ.ಕೆ ಕಾಲೋನಿಯಲ್ಲಿ ೬ ಮಂದಿಗೆ ಹಾಗು ಹಳ್ಳಿಕೆರೆ ವ್ಯಾಪ್ತಿಯಲ್ಲಿ ೭ ಮಂದಿಗೆ ಸೋಂಕು ಕಾಣಿಸಿಕೊಂಡಿದೆ. ಎ.ಕೆ ಕಾಲೋನಿಯಲ್ಲಿ ಸೋಂಕು ಕಾಣಿಸಿಕೊಂಡಿರುವ ಬ್ಯಾಂಕ್ ರಸ್ತೆಯನ್ನು ಮಾತ್ರ ಬಂದ್ ಮಾಡಲಾಗಿದೆ. ಆದರೆ ಇಡೀ ಕಾಲೋನಿಯ ನಿವಾಸಿಗಳು ಸಾಕಷ್ಟು ತೊಂದರೆ ಅನುಭವಿಸುವಂತಾಗಿದೆ. ಸೋಂಕು ಕಾಣಿಸಿಕೊಳ್ಳದ ರಸ್ತೆಗಳಲ್ಲಿನ ನಿವಾಸಿಗಳಿಗೂ ಹಾಲು, ಔಷಧ ಸೇರಿದಂತೆ ಇನ್ನಿತರ ಅಂಗಡಿ ಮುಂಗಟ್ಟುಗಳಲ್ಲಿ ಪ್ರವೇಶಿಸದಂತೆ ನಿರ್ಬಂಧಿಸಲಾಗುತ್ತಿದೆ. ಜೊತೆಗೆ ಅಕ್ಕಪಕ್ಕದ ಕಾಲೋನಿಯವರು ಸಹ ಒಂದು ರೀತಿಯಲ್ಲಿ ನೋಡುತ್ತಿದ್ದಾರೆಂಬ ಅಸಮಾಧಾನ ಇಲ್ಲಿನ ನಿವಾಸಿಗಳು ವ್ಯಕ್ತಪಡಿಸಿದ್ದಾರೆ.
ಈ ಹಿನ್ನಲೆಯಲ್ಲಿ ತಾಲೂಕು ಪಂಚಾಯಿತಿ ಆಡಳಿತ, ಗ್ರಾಮ ಪಂಚಾಯಿತಿ ಕಾರ್ಯಪಡೆ ವತಿಯಿಂದ ಜನರಲ್ಲಿ ಜಾಗೃತಿ ಮೂಡಿಸುವ ಅಗತ್ಯವಿದೆ. ಯಾವುದೇ ತಾರತಮ್ಯವಿಲ್ಲದೆ ಎಲ್ಲರನ್ನು ಒಂದೇ ರೀತಿಯಲ್ಲಿ ಕಾಣುವಂತಹ ವಾತಾವರಣ ಕಲ್ಪಿಸಿಕೊಡಬೇಕಾಗಿದೆ. 


Friday, May 28, 2021

ಕೊರೋನಾ ಸೋಂಕಿತರು, ಕ್ಯಾನ್ಸರ್ ರೋಗಿಗಳು, ಮುಂಚೂಣಿ ಕಾರ್ಯಕರ್ತರಿಗೆ ಹಣ್ಣು ಹಂಪಲು ವಿತರಣೆ


ಭದ್ರಾವತಿ ತಾಲೂಕು ಮಾಜಿ ಸೈನಿಕರ ಸಂಘದ ವತಿಯಿಂದ ಕೈಗೊಂಡಿರುವ ಹಣ್ಣು ಹಂಪಲು ವಿತರಿಸುವ ಸೇವಾ ಕಾರ್ಯಕ್ಕೆ ಹಳೇನಗರದ ತಾಲೂಕು ಸಾರ್ವಜನಿಕ ಸರ್ಕಾರಿ ಆಸ್ಪತ್ರೆಯಲ್ಲಿ ಶುಕ್ರವಾರ ತಹಸೀಲ್ದಾರ್ ಜಿ. ಸಂತೋಷ್‌ಕುಮಾರ್, ನಗರಸಭೆ ಪೌರಾಯುಕ್ತ  ಪರಮೇಶ್, ತಾಲೂಕು ಆರೋಗ್ಯಾಧಿಕಾರಿ ಡಾ.ಎಂ.ವಿ ಅಶೋಕ್ ಸೇರಿದಂತೆ ಇನ್ನಿತರರು ಚಾಲನೆ ನೀಡಿದರು.
    ಭದ್ರಾವತಿ, ಮೇ. ೨೮: ದೇಶ ಸೇವೆಯೊಂದಿಗೆ ಸಮಾಜ ಸೇವೆಗೂ ಸಿದ್ದ ಎಂಬುದನ್ನು ನಗರದ ತಾಲೂಕು ಮಾಜಿ ಸೈನಿಕರ ಸಂಘ ಪ್ರತಿ ಬಾರಿ ಸಂಕಷ್ಟದ  ಸಂದರ್ಭದಲ್ಲಿ ಸಾಬೀತು ಮಾಡಿ ತೋರಿಸುತ್ತಿದೆ. ಈ ಬಾರಿ ಸಹ ಸೇವೆಯನ್ನು ಮುಂದುವರೆಸಿದ್ದು, ಶುಕ್ರವಾರ ಕೊರೋನಾ ಸೋಂಕಿಗೆ ಒಳಗಾಗಿ ಚಿಕಿತ್ಸೆ ಪಡೆಯುತ್ತಿರುವವರಿಗೆ, ಕ್ಯಾನ್ಸರ್‌ನಿಂದ ಬಳಲುತ್ತಿರುವವರಿಗೆ ಹಾಗು ಕೊರೋನಾ ಮುಂಚೂಣಿ ಕಾರ್ಯಕರ್ತರಿಗೆ ಪೌಷ್ಠಿಕಾಂಶವುಳ್ಳ ಹಣ್ಣು ಹಂಪಲುಗಳನ್ನು ವಿತರಿಸಲಾಯಿತು.
     ಹಳೇನಗರದ ತಾಲೂಕು ಸಾರ್ವಜನಿಕ ಸರ್ಕಾರಿ ಆಸ್ಪತ್ರೆಯಲ್ಲಿ ಹಣ್ಣು ಹಂಪಲು ವಿತರಿಸುವ ಸೇವಾ ಕಾರ್ಯಕ್ಕೆ ತಹಸೀಲ್ದಾರ್ ಜಿ. ಸಂತೋಷ್‌ಕುಮಾರ್, ನಗರಸಭೆ ಪೌರಾಯುಕ್ತ  ಪರಮೇಶ್, ತಾಲೂಕು ಆರೋಗ್ಯಾಧಿಕಾರಿ ಡಾ.ಎಂ.ವಿ ಅಶೋಕ್ ಸೇರಿದಂತೆ ಇನ್ನಿತರರು ಚಾಲನೆ ನೀಡಿ ಮಾಜಿ ಸೈನಿಕರ ಸೇವಾ ಕಾರ್ಯಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದರು.
    ತಾಲೂಕು ಸಾರ್ವಜನಿಕ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಕೊರೋನಾ ಸೋಂಕಿತರಿಗೆ, ಕಾಗದ ನಗರದ ಎಂಪಿಎಂ ಕಲ್ಯಾಣ ಮಂಟಪದ ಕೋವಿಡ್ ಆರೈಕೆ ಕೇಂದ್ರದಲ್ಲಿರುವವರಿಗೆ, ಶಿವಮೊಗ್ಗ ಮಾಚೇನಹಳ್ಳಿಯ ಮಲ್ನಾಡ್ ಆಸ್ಪತ್ರೆ ಮತ್ತು ಗಂಥಿ ಸಂಸ್ಥೆಯಲ್ಲಿರುವ ಕ್ಯಾನ್ಸರ್ ರೋಗಿಗಳಿಗೆ ಹಾಗು ಕೊರೋನಾ ಮುಂಚೂಣಿ ಕಾರ್ಯಕರ್ತರಿಗೆ ಹಣ್ಣು ಹಂಪಲು ವಿತರಿಸುವ ಮೂಲಕ ಸೇವೆಯ ಸಾರ್ಥಕತೆಗೆ ಮಾಜಿ ಸೈನಿಕರು ಸಾಕ್ಷಿಯಾದರು.
    ಆಸ್ಪತ್ರೆಯ ಮುಖ್ಯ ವೈದ್ಯಾಧಿಕಾರಿ ಡಾ. ಓ. ಮಲ್ಲಪ್ಪ, ನಗರಸಭೆ ಕಂದಾಯಾಧಿಕಾರಿ ರಾಜ್‌ಕುಮಾರ್, ಪರಿಸರ ಅಭಿಯಂತರ ಪ್ರಭಾಕರ್, ಮಾಜಿ ಸೈನಿಕರ ಸಂಘದ ಉಪಾಧ್ಯಕ್ಷ ದಿನೇಶ್‌ಕುಮಾರ್, ಕಾರ್ಯದರ್ಶಿ ವೆಂಕಟಗಿರಿ ಹಾಗು ಪದಾಧಿಕಾರಿಗಳು ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

ಸಾವಿತ್ರಿ ಬಾಯಿ ನಿಧನ

ಸಾವಿತ್ರಿ ಬಾಯಿ
ಭದ್ರಾವತಿ, ಮೇ. ೨೮: ಪ್ರಿಂಟಿಂಗ್ ಪ್ರೆಸ್ ನೌಕರ ಅಜಯ್  ಅವರ ತಾಯಿ ಹಳೇನಗರದ ರಥಬೀದಿ ನಿವಾಸಿ ಸಾವಿತ್ರಿ ಬಾಯಿ(೫೭) ಶುಕ್ರವಾರ ನಿಧನ ಹೊಂದಿದರು.
   ಅನಾರೋಗ್ಯದಿಂದ ಹಳೇನಗರದ ತಾಲೂಕು ಸಾರ್ವಜನಿಕ ಸರ್ಕಾರಿ ಆಸ್ಪತ್ರೆಯಲ್ಲಿ ನಿಧನ ಹೊಂದಿದ್ದು, ಓರ್ವ ಪುತ್ರಿ, ಇಬ್ಬರು ಪುತ್ರರು ಹಾಗು ಮೊಮ್ಮಕ್ಕಳನ್ನು ಹೊಂದಿದ್ದರು. ಮೃತರ ನಿಧನಕ್ಕೆ ಮಲೆನಾಡು ಮುದ್ರಕರ ಮಾಲೀಕರ ಸಂಘದ ತಾಲೂಕು ಶಾಖೆ ಅಧ್ಯಕ್ಷ ಎನ್. ಗಣೇಶ್‌ರಾವ್ ಸಿಂಧ್ಯಾ ಸೇರಿದಂತೆ ಇನ್ನಿತರರು ಸಂತಾಪ ಸೂಚಿಸಿದ್ದಾರೆ.