Saturday, June 12, 2021

ಪೆಟ್ರೋಲ್, ಡೀಸೆಲ್, ಅಡುಗೆ ಅನಿಲ, ವಿದ್ಯುತ್ ದರ ಏರಿಕೆ ಖಂಡಿಸಿ ಪ್ರತಿಭಟನೆ

ಕೇಂದ್ರ, ರಾಜ್ಯ ಸರ್ಕಾರಗಳ ವಿರುದ್ಧ ಕಾಂಗ್ರೆಸ್ ಆಕ್ರೋಶ


ಪೆಟ್ರೋಲ್, ಡೀಸೆಲ್, ಅಡುಗೆ ಅನಿಲ, ವಿದ್ಯುತ್ ದರ ಏರಿಕೆ ಖಂಡಿಸಿ ಶನಿವಾರ ಭದ್ರಾವತಿ ಬ್ಲಾಕ್ ಕಾಂಗ್ರೆಸ್ ನಗರ ಹಾಗು ಗ್ರಾಮಾಂತರ ಘಟಕಗಳ ವತಿಯಿಂದ ಶಾಸಕ ಬಿ.ಕೆ ಸಂಗಮೇಶ್ವರ್ ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಾಯಿತು.
     ಭದ್ರಾವತಿ, ಜೂ. ೧೨: ಪೆಟ್ರೋಲ್, ಡೀಸೆಲ್, ಅಡುಗೆ ಅನಿಲ, ವಿದ್ಯುತ್ ದರ ಏರಿಕೆ ಖಂಡಿಸಿ ಶನಿವಾರ ಬ್ಲಾಕ್ ಕಾಂಗ್ರೆಸ್ ನಗರ ಹಾಗು ಗ್ರಾಮಾಂತರ ಘಟಕಗಳ ವತಿಯಿಂದ ಶಾಸಕ ಬಿ.ಕೆ ಸಂಗಮೇಶ್ವರ್ ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಾಯಿತು. 
ನಗರದ ವಿವಿಧೆಡೆ ಪೆಟ್ರೋಲ್ ಬಂಕ್‌ಗಳ ಬಳಿ ಪ್ರತಿಭಟನೆ ನಡೆಸಿದ ಕಾಂಗ್ರೆಸ್ ಪಕ್ಷದ ಮುಖಂಡರು, ಕಾರ್ಯಕರ್ತರು, ಕೋವಿಡ್ ಸಂಕಷ್ಟದ ಸಮಯದಲ್ಲಿ ಜನರ ನೆರವಿಗೆ ಬರಬೇಕಾದ ಕೇಂದ್ರ ಹಾಗು ರಾಜ್ಯ ಸರ್ಕಾರಗಳು ದಿನದಿಂದ ದಿನಕ್ಕೆ ಪೆಟ್ರೋಲ್, ಡೀಸೆಲ್, ಅಡುಗೆ ಅನಿಲ, ವಿದ್ಯುತ್ ದರ ಏರಿಕೆ ಮಾಡುವ ಮೂಲಕ ಜನರನ್ನು ಮತ್ತಷ್ಟು ಸಂಕಷ್ಟಕ್ಕೆ ತಳ್ಳುತ್ತಿವೆ ಎಂದು ಆರೋಪಿಸಿದರು. 
ತಕ್ಷಣ ಬೆಲೆ ಏರಿಕೆಗೆ ಕಡಿವಾಣ ಹಾಕಬೇಕು. ಕೋವಿಡ್ ಸಂಕಷ್ಟದಲ್ಲಿರುವ ಬಡ ಜನರಿಗೆ ಅಗತ್ಯ ದಿನಸಿ ಸಾಮಗ್ರಿಗಳನ್ನು ವಿತರಿಸಬೇಕು. ಕಾರ್ಮಿಕ ಹಾಗು ರೈತ ವಿರೋಧಿ ಧೋರಣೆಗಳನ್ನು ತಕ್ಷಣ ಕೈಬಿಡಬೇಕೆಂದು ಆಗ್ರಹಿಸಿದರು. 
ನಗರ ಘಟಕದ ಅಧ್ಯಕ್ಷ ಟಿ. ಚಂದ್ರೇಗೌಡ, ಗ್ರಾಮಾಂತರ ಘಟಕದ ಅಧ್ಯಕ್ಷ ಎಚ್.ಎಲ್ ಷಡಾಕ್ಷರಿ, ಮಹಿಳಾ ಘಟಕದ ಅಧ್ಯಕ್ಷೆ ಮಂಜುಳ ರಾಮಚಂದ್ರ, ಯುವ ಘಟಕದ ಅಧ್ಯಕ್ಷ ಜಿ. ವಿನೋದ್‌ಕುಮಾರ್,  ನಗರಸಭಾ ಸದಸ್ಯರಾದ ಬಿ.ಕೆ ಮೋಹನ್,  ಜಾರ್ಜ್, ಲತಾ ಚಂದ್ರಶೇಖರ್, ಚನ್ನಪ್ಪ, ಬಿ.ಟಿ ನಾಗರಾಜ್, ಕಾಂತರಾಜ್, ಮೊಹಮದ್, ಮುಖಂಡರಾದ ವೆಂಕಟೇಶ್ ಸುಬ್ಬಣ್ಣ, ಗಂಗಾಧರ್, ರಾಘವೇಂದ್ರ ಸರಾಟೆ, ಎಂ. ಶಿವಕುಮಾರ್, ಎಸ್.ಎಸ್ ಭೈರಪ್ಪ, ಆಂಜನಪ್ಪ, ದೇವೇಂದ್ರ ಗಿರಿ, ಲಕ್ಷ್ಮೀದೇವಿ, ಸುಮಿತ್ರ ಅಂಬೋರೆ, ಯುವ ಘಟಕದ ಭರತ್, ಶಂಕರ್, ವರುಣ್, ಉದಯ್, ಸುನಿಲ್ ವಿವಿಧ ಘಟಕಗಳ ಅಧ್ಯಕ್ಷರು, ಪದಾಧಿಕಾರಿಗಳು, ಮುಖಂಡರು ಪಾಲ್ಗೊಂಡಿದ್ದರು. 

Friday, June 11, 2021

ಭದ್ರಾವತಿಯಲ್ಲಿ ೧೦೩ ಸೋಂಕು ಪತ್ತೆ

   ಭದ್ರಾವತಿ, ಜೂ. ೧೧:  ಸರ್ಕಾರ ಜಾರಿಗೊಳಿಸಿರುವ ೨ನೇ ಅವಧಿಯ ಸೆಮಿ ಲಾಕ್‌ಡೌನ್ ಮುಕ್ತಾಯಗೊಳ್ಳುವ ಹಂತಕ್ಕೆ ಬಂದು ತಲುಪಿದೆ. ಆದರೂ ಸಹ ತಾಲೂಕಿನಲ್ಲಿ ಸೋಂಕಿನ ಪ್ರಮಾಣ ಇಳಿಕೆಯಾಗುವ ಲಕ್ಷಣಗಳು ಕಂಡು ಬರುತ್ತಿಲ್ಲ. ಶುಕ್ರವಾರ ೧೦೩ ಸೋಂಕು ಪತ್ತೆಯಾಗಿದೆ.
     ಒಟ್ಟು ೭೦೯ ಮಂದಿಯ ಮಾದರಿ ಸಂಗ್ರಹಿಸಲಾಗಿದ್ದು, ೧೦೩ ಮಂದಿಯಲ್ಲಿ ಸೋಂಕು ದೃಢಪಟ್ಟಿದೆ. ಕೇವಲ ೮೬ ಮಂದಿ ಆಸ್ಪತ್ರೆಗಳಿಂದ ಬಿಡುಗಡೆಗೊಂಡಿದ್ದಾರೆ. ಇದುವರೆಗೂ ಒಟ್ಟು ೬೧೯೪ ಸೋಂಕು ಪ್ರಕರಣಗಳು ದಾಖಲಾಗಿದ್ದು, ಈ ಪೈಕಿ ೫೨೧೫ ಮಂದಿ ಗುಣಮುಖರಾಗಿದ್ದಾರೆ. ೯೭೯ ಸಕ್ರಿಯ ಪ್ರಕರಣಗಳು ಬಾಕಿ ಉಳಿದಿವೆ. ಒಂದೇ ದಿನ ೪ ಮಂದಿ ಬಲಿಯಾಗಿದ್ದು, ಇದುವರೆಗೂ ೧೭೦ ಮಂದಿ ಮೃತಪಟ್ಟಿದ್ದಾರೆ.
    ಒಟ್ಟು ೨೭೬ ಮಂದಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ನಗರ ಪ್ರದೇಶದಲ್ಲಿ ಒಟ್ಟು ೪೦ ಕಂಟೈನ್‌ಮೆಂಟ್ ಜೋನ್‌ಗಳು ಸಕ್ರಿಯವಾಗಿವೆ.  ಒಟ್ಟು ೮೪ ಜೋನ್‌ಗಳನ್ನು ತೆರವುಗೊಳಿಸಲಾಗಿದೆ. ಗ್ರಾಮಾಂತರ ಪ್ರದೇಶದಲ್ಲಿ ಒಟ್ಟು ೨೭ ಜೋನ್‌ಗಳು ಸಕ್ರಿಯಾಗಿದ್ದು, ೧೭ ಜೋನ್‌ಗಳನ್ನು ತೆರವುಗೊಳಿಸಲಾಗಿದೆ.

ಜೂ.೧೨, ೧೩ ಎರಡು ದಿನ ಸಂಪೂರ್ಣ ಲಾಕ್‌ಡೌನ್

ಭದ್ರಾವತಿ, ಜೂ. ೧೧: ಕೊರೋನಾ ಸೋಂಕು ವ್ಯಾಪಕವಾಗಿ ಹರಡುತ್ತಿರುವ ಹಿನ್ನಲೆಯಲ್ಲಿ ತಾಲೂಕಿನಾದ್ಯಂತ ಜೂ.೧೨ ಮತ್ತು ೧೩ ಎರಡು ದಿನ ಸಂಪೂರ್ಣ ಲಾಕ್‌ಡೌನ್ ಘೋಷಿಸಲಾಗಿದೆ.
     ಹಾಲು ಮತ್ತು ಔಷಧಿ ಅಂಗಡಿ(ಮೆಡಿಕಲ್ಸ್) ಹೊರತುಪಡಿಸಿ ಮತ್ತು ಪೆಟ್ರೋಲ್ ಬಂಕ್, ರಸಗೊಬ್ಬರ ಅಂಗಡಿಗಳನ್ನು ಬೆಳಿಗ್ಗೆ ೬ ಗಂಟೆಯಿಂದ ೧೦ ಗಂಟೆವರೆಗೆ ಮಾತ್ರ ತೆರೆಯಲು ಅವಕಾಶವಿದ್ದು, ಉಳಿದಂತೆ ಯಾವುದೇ ಅಂಗಡಿ ಮುಂಗಟ್ಟುಗಳನ್ನು ತೆರೆಯುವಂತಿಲ್ಲ. ಅಲ್ಲದೆ ಅನಾವಶ್ಯಕ ಜನಸಂಚಾರ ಸಹ ನಿಷೇಧಿಸಲಾಗಿದೆ ಎಂದು ತಹಸೀಲ್ದಾರ್ ಜಿ. ಸಂತೋಷ್‌ಕುಮಾರ್ ತಿಳಿಸಿದ್ದಾರೆ.

ಪತ್ರಕರ್ತರ ಹಿತರಕ್ಷಣೆ ಜೊತೆಗೆ ಕುಟುಂಬದವರ ರಕ್ಷಣೆ ಸಹ ಮುಖ್ಯ : ಬಿ.ವೈ ರಾಘವೇಂದ್ರ


ಭದ್ರಾವತಿ ಹಳೇನಗರದ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಶುಕ್ರವಾರ ಪತ್ರಕರ್ತರ ಕುಟುಂಬದವರಿಗೆ ಹಮ್ಮಿಕೊಳ್ಳಲಾಗಿದ್ದ ಕೊರೋನಾ ಲಸಿಕೆ ಕಾರ್ಯಕ್ರಮದಲ್ಲಿ ಪತ್ರಕರ್ತರಿಗೆ ಕೊರೋನಾ ಸೋಂಕಿನ ರಕ್ಷಣೆಗಾಗಿ ಫೇಸ್ ಶೀಲ್ಡ್, ಸ್ಯಾನಿಟೈಜರ್, ಮಾಸ್ಕ್ ಮತ್ತು ಸ್ಟೀಮ್ ಇನ್‌ಹಲೇರ್ ಸೇರಿದಂತೆ ಇನ್ನಿತರ ವಸ್ತುಗಳನ್ನೊಳಗೊಂಡ ಕಿಟ್ ವಿತರಿಸಲಾಯಿತು.
    ಭದ್ರಾವತಿ, ಜೂ. ೧೧: ಕೊರೋನಾ ಸಂಕಷ್ಟದ ಸಮಯದಲ್ಲೂ ಹಗಲಿರುಳು ಶ್ರಮಿಸುತ್ತಿರುವ ಪತ್ರಕರ್ತರ ಹಿತರಕ್ಷಣೆ ಜೊತೆಗೆ ಕುಟುಂಬದವರ ರಕ್ಷಣೆ ಸಹ ಮುಖ್ಯವಾಗಿದೆ. ಈ ಹಿನ್ನಲೆಯಲ್ಲಿ ಕುಟುಂಬದವರಿಗೂ ಕೊರೋನಾ ಲಸಿಕೆ ಹಾಕುವಂತೆ ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಲಾಗಿದ್ದು, ಇದೀಗ ಜಿಲ್ಲೆಯ ಎಲ್ಲಾ ತಾಲೂಕುಗಳಲ್ಲೂ ಲಸಿಕೆ ನೀಡುವ ಕಾರ್ಯ ನಡೆಯುತ್ತಿದೆ ಎಂದು ಸಂಸದ ಬಿ.ವೈ ರಾಘವೇಂದ್ರ ಹೇಳಿದರು.
    ಅವರು ಹಳೇನಗರದ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಪತ್ರಕರ್ತರ ಕುಟುಂಬದವರಿಗೆ ಹಮ್ಮಿಕೊಳ್ಳಲಾಗಿದ್ದ ಕೊರೋನಾ ಲಸಿಕೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
     ಎಲ್ಲರೂ ಲಸಿಕೆ ಹಾಕಿಸಿಕೊಂಡಾಗ ಮಾತ್ರ ೩ನೇ ಅಲೆ ನಿಯಂತ್ರಿಸಲು ಸಾಧ್ಯ. ಈಗಾಗಲೇ ೨ನೇ ಅಲೆ ಪರಿಣಾಮ ಜನರು ಸಾಕಷ್ಟು ಸಂಕಷ್ಟಕ್ಕೆ ಒಳಗಾಗಿದ್ದಾರೆ. ಇಂತಹ ಸಂದರ್ಭದಲ್ಲಿ ಕೊರೋನಾ ಸೋಂಕು ಪುನಃ ಕಾಣಿಸಿಕೊಳ್ಳದಂತೆ ಸಂಪೂರ್ಣವಾಗಿ ನಿರ್ಮೂಲನೆಯಾಗಬೇಕು. ಈ ನಿಟ್ಟಿನಲ್ಲಿ ಎಲ್ಲರ ಪ್ರಯತ್ನ ಬಹಳ ಮುಖ್ಯವಾಗಿದೆ ಎಂದರು.
     ಸಂಕಷ್ಟದ ಸಮಯದಲ್ಲೂ ಕೇಂದ್ರ ಹಾಗು ರಾಜ್ಯ ಸರ್ಕಾರಗಳು ಅಭಿವೃದ್ಧಿ ಕಡೆಗೆ ಹೆಚ್ಚಿನ ಗಮನ ನೀಡುತ್ತಿವೆ. ಅಭಿವೃದ್ಧಿ ಕಾರ್ಯಗಳಿಗೂ ಆರ್ಥಿಕ ನೆರವು ಒದಗಿಸುತ್ತಿವೆ. ಈ ನಡುವೆ ಸಂಕಷ್ಟದ ಸಮಯದಲ್ಲೂ ಹಲವು ಸಂಘ ಸಂಸ್ಥೆಗಳು ನೆರವಿಗೆ ಮುಂದಾಗಿರುವುದು ಉತ್ತಮ ಬೆಳವಣಿಗೆಯಾಗಿದೆ. ಅದರಲ್ಲೂ ಭದ್ರಾವತಿ ನಗರದಲ್ಲಿ ಹಲವು ಸಂಘ-ಸಂಸ್ಥೆಗಳು ತೆರೆಮರೆಯಲ್ಲಿ ಸೇವೆ ಸಲ್ಲಿಸುತ್ತಿವೆ. ವಿಶೇಷವಾಗಿ ಬಜರಂಗದಳ ಕಾರ್ಯಕರ್ತರು ಸುಮಾರು ೫೦ಕ್ಕೂ ಅಧಿಕ ಕೊರೋನಾ ಸೋಂಕಿತ ಮೃತದೇಹಗಳ ಅಂತ್ಯಸಂಸ್ಕಾರ ನೆರವೇರಿಸಿರುವುದು ಎಲ್ಲರೂ ಮೆಚ್ಚುವ ಕಾರ್ಯವಾಗಿದೆ ಎಂದರು.
ಪತ್ರಿಕಾಭವನ ಕಾಮಗಾರಿ ಶೀಘ್ರವಾಗಿ ಮುಕ್ತಾಯಗೊಳ್ಳಬೇಕು. ಈ ನಿಟ್ಟಿನಲ್ಲಿ ಎಲ್ಲಾ ರೀತಿಯ ಸಹಕಾರ ನೀಡುತ್ತೇನೆ. ಮುಂದಿನ ದಿನಗಳಲ್ಲಿ ಸುಂದರವಾದ ಸಭಾ ಆವರಣದಲ್ಲಿ ಕಾರ್ಯಕ್ರಮಗಳು ನಡೆಯುವಂತಾಗಬೇಕೆಂದರು.
      ಇದೆ ಸಂದರ್ಭದಲ್ಲಿ ಪತ್ರಕರ್ತರಿಗೆ ಕೊರೋನಾ ಸೋಂಕಿನ ರಕ್ಷಣೆಗಾಗಿ ಫೇಸ್ ಶೀಲ್ಡ್, ಸ್ಯಾನಿಟೈಜರ್, ಮಾಸ್ಕ್ ಮತ್ತು ಸ್ಟೀಮ್ ಇನ್‌ಹಲೇರ್ ಸೇರಿದಂತೆ ಇನ್ನಿತರ ವಸ್ತುಗಳನ್ನೊಳಗೊಂಡ ಕಿಟ್ ವಿತರಿಸಲಾಯಿತು.
     ಸೂಡಾ ಅಧ್ಯಕ್ಷ ಎಸ್.ಎಸ್ ಜ್ಯೋತಿಪ್ರಕಾಶ್, ಸದಸ್ಯರಾದ ರಾಮಲಿಂಗಯ್ಯ, ವಿ. ಕದಿರೇಶ್, ರಾಜ್ಯ ಸಣ್ಣ ಕೈಗಾರಿಕಾ ಅಭಿವೃದ್ಧಿ ನಿಗಮದ ಉಪಾಧ್ಯಕ್ಷ ಎಸ್. ದತ್ತಾತ್ರಿ, ಪ್ರಮುಖರಾದ ಎಂ. ಪ್ರಭಾಕರ್, ಬಿ.ಕೆ ಶ್ರೀನಾಥ್, ಕೂಡ್ಲಿಗೆರೆ ಹಾಲೇಶ್, ಮಂಗೋಟೆ ರುದ್ರೇಶ್, ಕೆ. ಮಂಜುನಾಥ್, ಅವಿನಾಶ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

ದೇಶದ ಪ್ರತಿಯೊಬ್ಬರಿಗೂ ಲಸಿಕೆ : ಸವಾಲುಗಳ ನಡುವೆ ೩ನೇ ಅಲೆ ಸಮರ್ಥವಾಗಿ ಎದುರಿಸಿ

ಭದ್ರಾವತಿ ನ್ಯೂಟೌನ್ ವಿಐಎಸ್‌ಎಲ್ ಆಸ್ಪತ್ರೆಯಲ್ಲಿ ತಾಲೂಕಿನ ಸರ್ಕಾರಿ ನೌಕರರಿಗಾಗಿ ಪ್ರತ್ಯೇಕವಾಗಿ ತೆರೆಯಲಾಗಿರುವ ಕೋವಿಡ್ ಆರೈಕೆ ಕೇಂದ್ರ ಉದ್ಘಾಟಿಸಿ ಸಂಸದ ಬಿ.ವೈ ರಾಘವೇಂದ್ರ ಮಾತನಾಡಿದರು.
    ಭದ್ರಾವತಿ, ಜೂ. ೧೧: ಕೊರೋನಾ ನಿರ್ಮೂಲನೆಗಾಗಿ ಎಲ್ಲೆಡೆ ನಿರಂತರವಾದ ಹೋರಾಟಗಳು ನಡೆಯುತ್ತಿವೆ. ಈ ನಡುವೆ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು ಈಗಾಗಲೇ ದೇಶದ ಪ್ರತಿಯೊಬ್ಬರಿಗೂ ಲಸಿಕೆ ಲಭ್ಯವಾಗಬೇಕೆಂಬ ಆಶಯವನ್ನು ವ್ಯಕ್ತಪಡಿಸಿದ್ದಾರೆ. ಈ ನಿಟ್ಟಿನಲ್ಲಿ ಎಲ್ಲೆಡೆ ಲಸಿಕೆ ಕಾರ್ಯ ಭರದಿಂದ ನಡೆಯುತ್ತಿದ್ದು, ಮುಂದಿನ ವಾರ ರಾಜ್ಯಕ್ಕೆ ೧ ಕೋಟಿ ಲಸಿಕೆ ಬರಲಿದೆ ಎಂದು ಸಂಸದ ಬಿ.ವೈ ರಾಘವೇಂದ್ರ ತಿಳಿಸಿದರು.
    ಅವರು ಶುಕ್ರವಾರ ನ್ಯೂಟೌನ್ ವಿಐಎಸ್‌ಎಲ್ ಆಸ್ಪತ್ರೆಯಲ್ಲಿ ತಾಲೂಕಿನ ಸರ್ಕಾರಿ ನೌಕರರಿಗಾಗಿ ಪ್ರತ್ಯೇಕವಾಗಿ ತೆರೆಯಲಾಗಿರುವ ಕೋವಿಡ್ ಆರೈಕೆ ಕೇಂದ್ರ ಉದ್ಘಾಟಿಸಿ ಮಾತನಾಡಿದರು.
     ಇದೀಗ ೨ನೇ ಅಲೆ ಮುಕ್ತಾಯಗೊಳ್ಳುವ ಹಂತದಲ್ಲಿದ್ದು, ೩ನೇ ಅಲೆ ಕಾಣಿಸಿಕೊಳ್ಳುವ ಬಗ್ಗೆ ತಜ್ಞರು ಈಗಾಗಲೇ ಮುನ್ಸೂಚನೆ ನೀಡಿದ್ದಾರೆ. ಇದೀಗ ನಮ್ಮ ಮುಂದೆ ಹಲವು ಸವಾಲುಗಳಿವೆ. ಅವುಗಳನ್ನು ಸಮರ್ಥವಾಗಿ, ಪ್ರಾಮಾಣಿಕವಾಗಿ ಎದುರಿಸುವ ಪ್ರಯತ್ನ ಎಲ್ಲರೂ ಕೈಗೊಳ್ಳಬೇಕಾಗಿದೆ. ಸರ್ಕಾರಿ ನೌಕರರು  ಜೀವದ ಹಂಗು ತೊರೆದು ಹಗಲಿರುಳು ಶ್ರಮಿಸುತ್ತಿದ್ದಾರೆ. ರಾಜ್ಯದಲ್ಲಿ ಸರ್ಕಾರಿ ನೌಕರರ ಸಂಘಟನೆ ಹೆಚ್ಚು ಪ್ರಬಲವಾಗಿದ್ದು, ಕ್ರಿಯಾಶೀಲ ಅಧ್ಯಕ್ಷರ ಮಾರ್ಗದರ್ಶನದಲ್ಲಿ ರಾಜ್ಯಾದ್ಯಂತ ನಿರಂತರವಾದ ಚಟುವಟಿಕೆಗಳು ನಡೆಯುತ್ತಿವುದು ಶ್ಲಾಘನೀಯ ಎಂದು ಪ್ರಶಂಸೆ ವ್ಯಕ್ತಪಡಿಸಿದರು.


ಭದ್ರಾವತಿ ನ್ಯೂಟೌನ್ ವಿಐಎಸ್‌ಎಲ್ ಆಸ್ಪತ್ರೆಯಲ್ಲಿ ತಾಲೂಕಿನ ಸರ್ಕಾರಿ ನೌಕರರಿಗಾಗಿ ಪ್ರತ್ಯೇಕವಾಗಿ ತೆರೆಯಲಾಗಿರುವ ಕೋವಿಡ್ ಆರೈಕೆ ಕೇಂದ್ರ ಉದ್ಘಾಟಿಸಿದ ಸಂಸದ ಬಿ.ವೈ ರಾಘವೇಂದ್ರ ನಂತರ ಪರಿಶೀಲನೆ ನಡೆಸಿದರು.
    ಶಾಸಕ ಬಿ.ಕೆ ಸಂಗಮೇಶ್ವರ್, ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಸಿ.ಎಸ್ ಷಡಾಕ್ಷರಿ, ತಾಲೂಕು ಅಧ್ಯಕ್ಷ ಬಿ. ಸಿದ್ದಬಸಪ್ಪ, ಸೂಡಾ ಅಧ್ಯಕ್ಷ ಎಸ್.ಎಸ್ ಜ್ಯೋತಿಪ್ರಕಾಶ್, ಸದಸ್ಯರಾದ ರಾಮಲಿಂಗಯ್ಯ, ವಿ. ಕದಿರೇಶ್, ರಾಜ್ಯ ಸಣ್ಣ ಕೈಗಾರಿಕಾ ಅಭಿವೃದ್ಧಿ ನಿಗಮದ ಉಪಾಧ್ಯಕ್ಷ ಎಸ್. ದತ್ತಾತ್ರಿ, ತಹಸೀಲ್ದಾರ್ ಜಿ. ಸಂತೋಷ್‌ಕುಮಾರ್, ತಾಲೂಕು ಆರೋಗ್ಯಾಧಿಕಾರಿ ಡಾ. ಎಂ.ವಿ ಅಶೋಕ್, ಕೂಬಾನಾಯ್ಕ, ಯು. ಮಹಾದೇವಪ್ಪ, ಧನಂಜಯ, ನಿಲೇಶ್‌ರಾಜ್, ರಾಜ್‌ಕುಮಾರ್, ಎಂ.ಎಸ್. ಬಸವರಾಜ್, ರಾಜಪ್ಪ, ರಂಗನಾಥಪ್ರಸಾದ್, ರೇವಣಪ್ಪ, ಸರ್ಕಾರಿ ನೌಕರರ ಸಂಘದ ಪ್ರಮುಖರು ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.  

Thursday, June 10, 2021

ಸರ್ಕಾರಿ ನೌಕರರಿಗೆ ಪ್ರತ್ಯೇಕ ಕೋವಿಡ್ ಆರೈಕೆ ಕೇಂದ್ರ : ಜೂ.೧೧ರ ಬೆಳಿಗ್ಗೆ ೯.೩೦ಕ್ಕೆ ಉದ್ಘಾಟನೆ

   ಭದ್ರಾವತಿ, ಜೂ. ೧೦: ತಾಲೂಕಿನ ಸರ್ಕಾರಿ ನೌಕರರಿಗಾಗಿ ಪ್ರತ್ಯೇಕವಾಗಿ ಕೋವಿಡ್ ಆರೈಕೆ ಕೇಂದ್ರ ನ್ಯೂಟೌನ್ ವಿಐಎಸ್‌ಎಲ್ ಆಸ್ಪತ್ರೆಯಲ್ಲಿ ಕಾರ್ಯಾರಂಭಗೊಳ್ಳುತ್ತಿದ್ದು, ಸಂಸದ ಬಿ.ವೈ ರಾಘವೇಂದ್ರ ಮತ್ತು ಶಾಸಕ ಬಿ.ಕೆ ಸಂಗಮೇಶ್ವರ್ ಹಾಗು ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಸಿ.ಎಸ್ ಷಡಾಕ್ಷರಿ ಆರೈಕೆ ಕೇಂದ್ರವನ್ನು ಶುಕ್ರವಾರ ಉದ್ಘಾಟಿಸುವರು.
     ಕಳೆದ ೩-೪ ದಿನಗಳ ಹಿಂದೆ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ತಾಲೂಕು ಶಾಖೆ ನೂತನ ಅಧ್ಯಕ್ಷ ಬಿ. ಸಿದ್ದಬಸಪ್ಪ ತಾಲೂಕಿನಲ್ಲಿ ಸರ್ಕಾರಿ ನೌಕರರು ಹೆಚ್ಚಾಗಿ ಕೊರೋನಾ ಸೋಂಕಿಗೆ ಒಳಗಾಗುತ್ತಿದ್ದು, ಈ ಹಿನ್ನಲೆಯಲ್ಲಿ ನೌಕರರಿಗೆ ಪ್ರತ್ಯೇಕವಾದ ಆರೈಕೆ ಕೇಂದ್ರ ತೆರೆಯುವಂತೆ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದ್ದರು.
    ತಕ್ಷಣ ಮನವಿಗೆ ಸ್ಪಂದಿಸಿದ ಜಿಲ್ಲಾಧಿಕಾರಿಗಳು ಪ್ರತ್ಯೇಕ ಆರೈಕೆ ಕೇಂದ್ರ ತೆರೆಯಲು ಆದೇಶಿಸಿದ್ದರು. ಈ ಹಿನ್ನಲೆಯಲ್ಲಿ ವಿಐಎಸ್‌ಎಲ್ ಆಸ್ಪತ್ರೆಯಲ್ಲಿ ಪ್ರತ್ಯೇಕವಾದ ಆರೈಕೆ ಕೇಂದ್ರ ತೆರೆಯಲಾಗಿದೆ. ಬೆಳಿಗ್ಗೆ ೯.೩೦ಕ್ಕೆ ಉದ್ಘಾಟನೆ ನಡೆಯಲಿದ್ದು, ಕಾರ್ಯಕ್ರಮ ಯಶಸ್ವಿಗೊಳಿಸುವಂತೆ ಸಿದ್ದಬಸಪ್ಪ ಕೋರಿದ್ದಾರೆ.

ಜೂ.೧೪ರ ವರೆಗೆ ಗೋಣಿ ಬೀಡು, ಮಲ್ಲಿಗೇನಹಳ್ಳಿ ಸೀಲ್‌ಡೌನ್


ಭದ್ರಾವತಿ ತಾಲೂಕಿನ ತಾವರಘಟ್ಟ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗೋಣಿ ಬೀಡು ಮತ್ತು ಮಲ್ಲಿಗೇನಹಳ್ಳಿ ಎರಡು ಗ್ರಾಮಗಳನ್ನು ಜೂ.೧೪ರ ವರೆಗೆ ಸೀಲ್‌ಡೌನ್ ಮಾಡಿರುವ ಹಿನ್ನಲೆಯಲ್ಲಿ ಗ್ರಾಮದ ರಸ್ತೆಗಳು ಬಿಕೋ ಎನ್ನುತ್ತಿರುವುದು.
     ಭದ್ರಾವತಿ, ಜೂ. ೧೦: ತಾಲೂಕಿನ ತಾವರಘಟ್ಟ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗೋಣಿ ಬೀಡು ಮತ್ತು ಮಲ್ಲಿಗೇನಹಳ್ಳಿ ಎರಡು ಗ್ರಾಮಗಳನ್ನು ಜೂ.೧೪ರ ವರೆಗೆ ಸೀಲ್‌ಡೌನ್ ಮಾಡಲಾಗಿದೆ.
   ಗೋಣಿ ಬೀಡು ಮತ್ತು ಮಲ್ಲಿಗೇನಹಳ್ಳಿ ಈ ಎರಡು ಗ್ರಾಮಗಳಲ್ಲಿ ಕೊರೋನಾ ಸೋಂಕು ವ್ಯಾಪಕವಾಗಿ ಹರಡುತ್ತಿರುವ ಹಿನ್ನಲೆಯಲ್ಲಿ ಗ್ರಾಮ ಪಂಚಾಯಿತಿ ಕೋವಿಡ್ ಕಾರ್ಯ ಪಡೆ ಸಭೆಯಲ್ಲಿ ಸೀಲ್‌ಡೌನ್ ಮಾಡಲು ತೀರ್ಮಾನಿಸಲಾಯಿತು.
   ಗ್ರಾಮದಲ್ಲಿ ದಿನಸಿ ಹಾಗು ಮಾಸದಂಗಡಿಗಳಲ್ಲಿ ಬೆಳಿಗ್ಗೆ ೬ ರಿಂದ ೮ ಗಂಟೆಗೆ ವ್ಯಾಪಾರಕ್ಕೆ ಅವಕಾಶ ನೀಡಲಾಗಿದೆ. ಹೋಟೆಲ್ ಸೇರಿದಂತೆ ಯಾವುದೇ ಅಂಗಡಿಮುಂಗಟ್ಟುಗಳು ತೆರೆಯುವಂತಿಲ್ಲ. ಗ್ರಾಮ ಪಂಚಾಯಿತಿ ಆಡಳಿತ ಮಾಸ್ಕ್ ಧರಿಸದೆ ಸಂಚರಿಸುವವರಿಗೆ ೧೦೦ ರು. ದಂಡ ವಿಧಿಸಲಿದೆ.