Monday, July 5, 2021

ನಗರಸಭೆ ನೌಕರ ಶ್ರೀನಿವಾಸ್ ನಿಧನ

ಶ್ರೀನಿವಾಸ್
   ಭದ್ರಾವತಿ, ಜು. ೫: ನಗರಸಭೆ ಕಂದಾಯ ವಿಭಾಗದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ನೌಕರ ಶ್ರೀನಿವಾಸ್(೪೬) ಹೃದಯಾಘಾತದಿಂದ ಸೋಮವಾರ ನಿಧನ ಹೊಂದಿದರು.
    ಪತ್ನಿ, ಇಬ್ಬರು ಪುತ್ರಿಯರು ಇದ್ದರು. ಇವರ ಅಂತ್ಯಕ್ರಿಯೆ ಶಿವಮೊಗ್ಗ ಶರಾವತಿ ನಗರದಲ್ಲಿರುವ ರುದ್ರಭೂಮಿಯಲ್ಲಿ ನೆರವೇರಿತು. ಪೌರಾಯುಕ್ತ ಕೆ. ಪರಮೇಶ್, ಕಂದಾಯಾಧಿಕಾರಿ ರಾಜ್‌ಕುಮಾರ್, ಪರಿಸರ ಅಭಿಯಂತರ ಪ್ರಭಾಕರ್ ಹಾಗು ಕಚೇರಿ ಸಿಬ್ಬಂದಿ ವರ್ಗದವರು ಸಂತಾಪ ಸೂಚಿಸಿದ್ದಾರೆ.

ಹೆಣ್ಣು ಚುಕ್ಕೆ ಜಿಂಕೆ ಬೇಟೆಯಾಡಿ ಸಾಗಾಣಿಕೆ : ಓರ್ವನ ಸೆರೆ

ಭದ್ರಾವತಿ ವಲಯ ಅರಣ್ಯ ಇಲಾಖೆ ಸಿಬ್ಬಂದಿಗಳ ಕಾರ್ಯಾಚರಣೆ


ಹೆಣ್ಣು ಚುಕ್ಕೆ ಜಿಂಕೆ ಬೇಟೆಯಾಡಿ ಸಾಗಾಣಿಕೆ ಮಾಡುತ್ತಿದ್ದ ಓರ್ವನನ್ನು ಭದ್ರಾವತಿ ವಲಯ ಅರಣ್ಯ ಇಲಾಖೆ ಸಿಬ್ಬಂದಿಗಳು ಬಂಧಿಸಿರುವುದು.   
    ಭದ್ರಾವತಿ, ಜು. ೫:  ಹೆಣ್ಣು ಚುಕ್ಕೆ ಜಿಂಕೆ ಬೇಟೆಯಾಡಿ ಸಾಗಾಣಿಕೆ ಮಾಡುತ್ತಿದ್ದ ಓರ್ವನನ್ನು ಅರಣ್ಯ ಇಲಾಖೆ ಸಿಬ್ಬಂದಿಗಳು ಬಂಧಿಸಿರುವ ಘಟನೆ ನಡೆದಿದೆ.
   ತಾಲೂಕಿನ ತಿಮ್ಲಾಪುರ ಗ್ರಾಮದ ನಿವಾಸಿ ಯೋಗೀಶ್ ನಾಯ್ಕ (೩೪) ಎಂಬಾತನನ್ನು ಬಂಧಿಸಲಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೊಬ್ಬ ವ್ಯಕ್ತಿ ರಬ್ಬರ್‌ಕಾಡು ನಿವಾಸಿ ಷಣ್ಮುಗ(೬೦) ತಲೆಮರೆಸಿಕೊಂಡಿದ್ದಾನೆ.
    ಖಚಿತ ಮಾಹಿತಿ ಆಧಾರದ ಮೇರೆಗೆ ಉಪ ಅರಣ್ಯ ಸಂರಕ್ಷಣಾಧಿಕಾರಿ ಕೆ.ಎಂ ಗಾಮನಗಟ್ಟಿ ಮಾರ್ಗದರ್ಶನದಲ್ಲಿ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಕೆ.ವಿ ಸುಬ್ರಮಣ್ಯ ಹಾಗು ವಲಯ ಅರಣ್ಯಾಧಿಕಾರಿ ಕೆ.ಎಚ್ ಮಂಜುನಾಥ್ ನೇತೃತ್ವದಲ್ಲಿ ಸಿದ್ದಾಪುರ ಶಾಖೆಯ ಅರಣ್ಯ ವ್ಯಾಪ್ತಿಯ ಕಾಳನಕಟ್ಟೆ ಗ್ರಾಮದ ತಮ್ಮಡಿಹಳ್ಳಿ ಎಸ್.ಎಫ್ ಅರಣ್ಯ ಪ್ರದೇಶದಲ್ಲಿ ಕಾರ್ಯಾಚರಣೆ ನಡೆಸಿ ಹೆಣ್ಣು ಚುಕ್ಕೆ ಜಿಂಕೆ ಬೇಟೆಯಾಡಿ ಸಾಗಾಣಿಕೆ ಮಾಡುತ್ತಿದ್ದಾಗ ಅರಣ್ಯ ಇಲಾಖೆ ಸಿಬ್ಬಂದಿಗಳು ಬಂಧಿಸಿದ್ದಾರೆ.
    ಮೃತಪಟ್ಟಿರುವ ಹೆಣ್ಣು ಚುಕ್ಕೆ ಜಿಂಕೆ, ಒಂದು ನಾಡ ಬಂದೂಕು ಮತ್ತು ಒಂದು ದ್ವಿಚಕ್ರ ವಾಹನ ವಶಪಡಿಸಿಕೊಂಡು ವನ್ಯಜೀವಿ ಸಂರಕ್ಷಣೆ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ.
   ಉಪ ವಲಯ ಅರಣ್ಯಾಧಿಕಾರಿಗಳಾದ ವಿಜಯಕುಮಾರ್ ಮಾಳಗಿ, ಬಿ.ಆರ್ ದಿನೇಶ್‌ಕುಮಾರ್, ನವೀನ್‌ಕುಮಾರ್, ಅಣ್ಣನಾಯ್ಕ್ ಮತ್ತು ಅರಣ್ಯ ರಕ್ಷಕರಾದ ನಾಗೇಂದ್ರ, ರಶೀದ್ ಬೇಗ್, ಭಾಸ್ಕರ್, ಅರಣ್ಯ ವೀಕ್ಷಕರಾದ ಸಚಿನ್, ಶಿವು ಮತ್ತು ಸೋನು  ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು.

ನರೇಗಾ ಯೋಜನೆ ಅನುಷ್ಠಾನ : ದೇಶದಲ್ಲಿಯೇ ಕರ್ನಾಟಕ ಮೊದಲು

ತ್ಯಾಜ್ಯ ವಿಲೇವಾರಿ ಘಟಕ ಸ್ವಚ್ಛ ಸಂಕೀರ್ಣ ಉದ್ಘಾಟನಾ ಕಾರ್ಯಕ್ರಮದಲ್ಲಿ ಕೆ.ಎಸ್ ಈಶ್ವರಪ್ಪ


ಭದ್ರಾವತಿ ತಾಲೂಕಿನ ಅಂತರಗಂಗೆ ಗ್ರಾಮ ಪಂಚಾಯಿತಿ ವತಿಯಿಂದ ಮಹಾತ್ಮಗಾಂಧಿ ಉದ್ಯೋಗ ಖಾತ್ರಿ ಯೋಜನೆಯಡಿ ಸುಮಾರು ೯ ಲಕ್ಷ ರು. ವೆಚ್ಚದಲ್ಲಿ ಅನುಷ್ಠಾನಗೊಳಿಸಲಾಗಿರುವ ತ್ಯಾಜ್ಯ ವಿಲೇವಾರಿ ಘಟಕ ಸ್ವಚ್ಛ ಸಂಕೀರ್ಣ ಸೋಮವಾರ ಸಚಿವ ಕೆ.ಎಸ್ ಈಶ್ವರಪ್ಪ ಉದ್ಘಾಟಿಸಿದರು.
   ಭದ್ರಾವತಿ, ಜು. ೫: ಕರ್ನಾಟಕ ರಾಜ್ಯ ಮಹಾತ್ಮಗಾಂಧಿ ಉದ್ಯೋಗ ಖಾತ್ರಿ ಯೋಜನೆಗಳನ್ನು ಯಶಸ್ವಿಯಾಗಿ ಅನುಷ್ಠಾನಗೊಳಿಸುವಲ್ಲಿ ದೇಶದಲ್ಲಿಯೇ ಮುಂಚೂಣಿಯಲ್ಲಿದ್ದು, ಪ್ರಸಕ್ತ ಸಾಲಿನಲ್ಲಿ ಹೆಚ್ಚುವರಿಯಾಗಿ ೨ ಕೋ. ರು. ಅನುದಾನ ಬಿಡುಗಡೆಯಾಗಿದೆ ಎಂದು ಪಂಚಾಯತ್ ರಾಜ್ ಹಾಗು ಗ್ರಾಮೀಣಾಭಿವೃದ್ಧಿ ಖಾತೆ ಸಚಿವ ಕೆ.ಎಸ್ ಈಶ್ವರಪ್ಪ ತಿಳಿಸಿದರು.
ಅವರು ಸೋಮವಾರ ತಾಲೂಕಿನ ಅಂತರಗಂಗೆ ಗ್ರಾಮ ಪಂಚಾಯಿತಿ ವತಿಯಿಂದ ಮಹಾತ್ಮಗಾಂಧಿ ಉದ್ಯೋಗ ಖಾತ್ರಿ ಯೋಜನೆಯಡಿ ಸುಮಾರು ೯ ಲಕ್ಷ ರು. ವೆಚ್ಚದಲ್ಲಿ ಅನುಷ್ಠಾನಗೊಳಿಸಲಾಗಿರುವ ತ್ಯಾಜ್ಯ ವಿಲೇವಾರಿ ಘಟಕ ಸ್ವಚ್ಛ ಸಂಕೀರ್ಣ ಉದ್ಘಾಟಿಸಿ ಮಾತನಾಡಿದರು.
     ಗ್ರಾಮಗಳು ಅಭಿವೃದ್ಧಿಯಾದಲ್ಲಿ ದೇಶ ಅಭಿವೃದ್ಧಿಯಾಗುತ್ತದೆ ಎಂಬ ಪರಿಕಲ್ಪನೆಯನ್ನು ಅಂದಿನ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿಯವರು ಹೊಂದಿದ್ದರು. ಭವಿಷ್ಯದ ರಾಜಕಾರಣಿಗಳಿಗೆ ಇದನ್ನು ಮನದಟ್ಟು ಮಾಡಿಕೊಡುತ್ತಿದ್ದರು. ದೇಶದಲ್ಲಿ ಪ್ರತಿಯೊಬ್ಬರಿಗೂ ಉದ್ಯೋಗ ಲಭ್ಯವಾಗಬೇಕೆಂಬ ಆಶಯದೊಂದಿಗೆ, ಗ್ರಾಮೀಣ ಜನರಿಗೆ ಉದ್ಯೋಗ ಕಲ್ಪಿಸಿಕೊಡುವ ನಿಟ್ಟಿನಲ್ಲಿ ಉದ್ಯೋಗ ಖಾತ್ರಿ ಯೋಜನೆಯನ್ನು ಜಾರಿಗೆ ತರಲಾಯಿತು. ಇದರಿಂದಾಗಿ ಉದ್ಯೋಗದ ಜೊತೆಗೆ ಗ್ರಾಮಗಳ ಅಭಿವೃದ್ಧಿಯಾಗುತ್ತಿದೆ ಎಂದರು.


ಭದ್ರಾವತಿ ತಾಲೂಕಿನ ಅಂತರಗಂಗೆ ಗ್ರಾಮ ಪಂಚಾಯಿತಿ ವತಿಯಿಂದ ಸೋಮವಾರ ಹಮ್ಮಿಕೊಳ್ಳಲಾಗಿದ್ದ ಮಹಾತ್ಮಗಾಂಧಿ ಉದ್ಯೋಗ ಖಾತ್ರಿ ಯೋಜನೆಯಡಿ ಸುಮಾರು ೯ ಲಕ್ಷ ರು. ವೆಚ್ಚದಲ್ಲಿ ಅನುಷ್ಠಾನಗೊಳಿಸಲಾಗಿರುವ ತ್ಯಾಜ್ಯ ವಿಲೇವಾರಿ ಘಟಕ ಸ್ವಚ್ಛ ಸಂಕೀರ್ಣ ಉದ್ಘಾಟನಾ ಕಾರ್ಯಕ್ರಮದಲ್ಲಿ ಕುಡಿಯುವ ನೀರು ಹಾಗು ನೈರ್ಮಲ್ಯ ಕುರಿತು ಸಮಸ್ಯೆಗಳಿಗೆ ಸಂಬಂಧಿಸಿದಂತೆ ಪರಿಹಾರ ಸಹಾಯವಾಣಿ ಸಂಖ್ಯೆ ಬಿಡುಗಡೆಗೊಳಿಸಲಾಯಿತು.
    ಪ್ರಸ್ತುತ ರಾಜ್ಯದಲ್ಲಿ ಉದ್ಯೋಗ ಖಾತ್ರಿ ಯೋಜನೆ ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಲಾಗುತ್ತಿದೆ. ಉದ್ಯೋಗ ಬಯಸುವ ಪ್ರತಿಯೊಬ್ಬರಿಗೂ ಈ ಯೋಜನೆಯಡಿ ತಕ್ಷಣ ಉದ್ಯೋಗ ಚೀಟಿ ನೀಡಲಾಗುತ್ತಿದೆ. ಅಲ್ಲದೆ ಕೂಲಿ ಮೊತ್ತ ಹೆಚ್ಚಿಸಿ ಅನ್ಯಾಯವಾಗದಂತೆ ನೇರವಾಗಿ ಫಲಾನುಭವಿಗಳ ಬ್ಯಾಂಕ್ ಖಾತೆಗಳಿಗೆ ತಲುಪುವಂತೆ ಮಾಡಲಾಗಿದೆ. ಇವೆಲ್ಲದರ ಪರಿಣಾಮವಾಗಿ ಯೋಜನೆ ಬಹುತೇಕ ಯಶಸ್ವಿಯಾಗುತ್ತಿದ್ದು, ಕೇಂದ್ರ ಸರ್ಕಾರ ಪ್ರಸಕ್ತ ಸಾಲಿನಲ್ಲಿ ನಿಗದಿಪಡಿಸಿದ್ದ ೧೩ ಕೋ. ರು. ಮೊತ್ತದ ಯೋಜನೆಗಳ ಗುರಿಯನ್ನು ಈಗಾಗಲೇ ತಲುಪಲಾಗಿದೆ. ಇನ್ನೂ ಕಾಲಾವಕಾಶವಿದ್ದು, ಈ ಹಿನ್ನಲೆಯಲ್ಲಿ ಹೆಚ್ಚುವರಿಯಾಗಿ ಮೊತ್ತ ಬಿಡುಗಡೆ ಮಾಡುವಂತೆ ಕೇಂದ್ರ ಸಚಿವರಿಗೆ ಮನವಿ ಮಾಡಿದ ಪರಿಣಾಮ ಸಚಿವರು ಹೊಸದಾಗಿ ೮೦೦ ಕೋ.ರು. ಬಿಡುಗಡೆಗೊಳಿಸಿದ್ದು, ಈ ಪೈಕಿ ೨ ಕೋ. ರು. ರಾಜ್ಯಕ್ಕೆ ಲಭಿಸಿದೆ ಎಂದರು.  
    ಜಿಲ್ಲೆಯಲ್ಲಿ ಉದ್ಯೋಗ ಖಾತ್ರಿ ಯೋಜನೆಯಡಿ ಇನ್ನೂ ಹೊಸ ಹೊಸ ಯೋಜನೆಗಳನ್ನು ಕೈಗೆತ್ತಿಕೊಳ್ಳಬೇಕಾಗಿದೆ. ಗ್ರಾಮ ಪಂಚಾಯಿತಿ ಸದಸ್ಯರೆಲ್ಲರೂ ಒಂದೆಡೆ ಸಭೆ ನಡೆಸಿ ಗ್ರಾಮದಲ್ಲಾಗಬೇಕಾಗಿರುವ ಕೆಲಸಗಳ ಬಗ್ಗೆ ಮೊದಲು ಅರಿತುಕೊಳ್ಳಬೇಕಾಗಿದೆ. ಉದ್ಯೋಗ ಖಾತ್ರಿ ಯೋಜನೆಯಡಿ ಕೈಗೊಳ್ಳಬಹುದಾದ ಕೆಲಸಗಳ ಬಗ್ಗೆ ಅಧಿಕಾರಿಗಳಿಂದ ಸೂಕ್ತ ತರಬೇತಿ ಪಡೆದುಕೊಳ್ಳಬೇಕಾಗಿದೆ. ಈ ಮೂಲಕ ಇನ್ನೂ ಹೆಚ್ಚಿನ ಅಭಿವೃದ್ಧಿ ಕಾರ್ಯಗಳನ್ನು ಗ್ರಾಮಮಟ್ಟದಲ್ಲಿ ಕೈಗೊಳ್ಳಬೇಕೆಂದರು.

ಭದ್ರಾವತಿ ತಾಲೂಕಿನ ಅಂತರಗಂಗೆ ಗ್ರಾಮ ಪಂಚಾಯಿತಿ ವತಿಯಿಂದ ಸೋಮವಾರ ಹಮ್ಮಿಕೊಳ್ಳಲಾಗಿದ್ದ ಮಹಾತ್ಮಗಾಂಧಿ ಉದ್ಯೋಗ ಖಾತ್ರಿ ಯೋಜನೆಯಡಿ ಸುಮಾರು ೯ ಲಕ್ಷ ರು. ವೆಚ್ಚದಲ್ಲಿ ಅನುಷ್ಠಾನಗೊಳಿಸಲಾಗಿರುವ ತ್ಯಾಜ್ಯ ವಿಲೇವಾರಿ ಘಟಕ ಸ್ವಚ್ಛ ಸಂಕೀರ್ಣ ಉದ್ಘಾಟನಾ ಕಾರ್ಯಕ್ರಮಕ್ಕೂ ಮೊದಲು ಸಚಿವ ಕೆ.ಎಸ್ ಈಶ್ವರಪ್ಪ, ಶಾಸಕರಾದ ಬಿ.ಕೆ ಸಂಗಮೇಶ್ವರ್, ಆರ್. ಪ್ರಸನ್ನಕುಮಾರ್ ಸೇರಿದಂತೆ ಇನ್ನಿತರರು ಸಸಿಗಳನ್ನು ನೆಡುವ ಮೂಲಕ ವನಮಹೋತ್ಸವಕ್ಕೆ ಚಾಲನೆ ನೀಡಲಾಯಿತು.
    ಶಾಸಕ ಬಿ.ಕೆ ಸಂಗಮೇಶ್ವರ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿ, ಎಲ್ಲಿ ಸ್ವಚ್ಛತೆ ಇರುವುದಿಲ್ಲವೋ ಅಲ್ಲಿ ಸಾಂಕ್ರಾಮಿಕ ರೋಗಗಳು ಹೆಚ್ಚಾಗುತ್ತವೆ. ಈ ಹಿನ್ನಲೆಯಲ್ಲಿ ಗ್ರಾಮಸ್ಥರು ಸ್ವಚ್ಛತೆಗೆ ಹೆಚ್ಚಿನ ಗಮನ ಹರಿಸಬೇಕೆಂದರು.
    ತಾಲೂಕಿನ ೨೨ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಕುಡಿಯುವ ನೀರಿನ ಸಮಸ್ಯೆ ಇದ್ದು, ಶಾಸಕರ ನಿಧಿಯಲ್ಲಿ ಯಾವುದೇ ಅನುದಾನವಿಲ್ಲವಾಗಿದೆ. ಈ ಹಿನ್ನಲೆಯಲ್ಲಿ ಜಿಲ್ಲಾ ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿಗಳು ಪ್ರತಿ ಗ್ರಾಮ ಪಂಚಾಯಿತಿಗೆ ಭೇಟಿ ನೀಡಿ ಪರಿಶೀಲನೆ ನಡೆಸುವ ಮೂಲಕ ತುರ್ತು ಕ್ರಮ ಕೈಗೊಳ್ಳಬೇಕೆಂದು ಮನವಿ ಮಾಡಿದರು.
     ವಿಧಾನಪರಿಷತ್ ಸದಸ್ಯ ಆರ್. ಪ್ರಸನ್ನಕುಮಾರ್ ಮಾತನಾಡಿ, ಗ್ರಾಮಗಳಲ್ಲೂ ಸ್ವಚ್ಛತೆ ಬಹಳ ಮುಖ್ಯ. ಗ್ರಾಮಸ್ಥರು ಈ ಬಗ್ಗೆ ಜಾಗೃತಿ ಹೊಂದಬೇಕು. ತ್ಯಾಜ್ಯ ವಿಲೇವಾರಿ ಹೆಚ್ಚಿನ ತಿಳುವಳಿಕೆ ಹೊಂದಬೇಕೆಂದರು.

ಜಮೀನ್ದಾರ್ ಚನ್ನೇಗೌಡರ ನನೆಪು ಮಾಡಿಕೊಂಡ ಕೆ.ಎಸ್ ಈಶ್ವರಪ್ಪ :
ಅಂತರಗಂಗೆ ಸೇರಿದಂತೆ ಸುತ್ತಮುತ್ತಲ ಗ್ರಾಮಗಳ ಹಿರಿಯ ಮಾರ್ಗದರ್ಶಕರಾಗಿದ್ದ ದಿವಂಗತ ಚನ್ನೇಗೌಡರನ್ನು ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್ ಈಶ್ವರಪ್ಪ ನೆನಪು ಮಾಡಿಕೊಂಡರು. ಚನ್ನೇಗೌಡರ ಶಿಷ್ಯರಲ್ಲಿ ತಾವೂ ಸಹ ಒಬ್ಬರಾಗಿದ್ದು, ಅವರ ಮಾರ್ಗದರ್ಶನದಲ್ಲಿ ನಾವೆಲ್ಲರೂ ಇಂದು ಈ ಮಟ್ಟದಲ್ಲಿ ಬೆಳೆದಿದ್ದೇವೆ. ಗ್ರಾಮದ ಅಭಿವೃದ್ಧಿಗೆ ಚನ್ನೇಗೌಡರ ಪಾತ್ರ ಸಹ ಪ್ರಮುಖವಾಗಿದೆ. ಗ್ರಾಮಸ್ಥರು ಪ್ರಸ್ತುತ ರಾಜ್ಯಕ್ಕೆ ಮಾದರಿಯಾಗುವಂತಹ ಕಾರ್ಯ ಕೈಗೊಳ್ಳುವ ಮೂಲಕ ಅವರ ಹೆಸರನ್ನು ಚಿರಸ್ಥಾಯಿಯನ್ನಾಗಿಸಿದ್ದಾರೆಂದು ಪ್ರಶಂಸೆ ವ್ಯಕ್ತಪಡಿಸಿದರು.

    ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಎಂ.ಎಲ್ ವೈಶಾಲಿ, ತಾಲೂಕು ಪಂಚಾಯಿತಿ ಅಧ್ಯಕ್ಷೆ ಸವಿತಾ, ತಾಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ರಮೇಶ್, ಜಿ.ಪಂ. ಅಧಿಕಾರಿಗಳಾದ ನಂದಿನಿ, ರಾಮಕೃಷ್ಣ ಪುರಾಣಿಕ್, ಗ್ರಾ.ಪಂ. ಅಭಿವೃದ್ಧಿ ಅಧಿಕಾರಿ ವೆಂಕಟೇಶ್, ಸದಸ್ಯರಾದ ಗೀತಾ, ಬಿ. ನಾಗೇಶ್, ಮಂಜುಳ, ಸಿ. ಶ್ರೀಧರ್, ಜಿ. ಮಂಜಪ್ಪ, ಟಿ.ಆರ್ ಶೋಭ, ದೇವಿಕಾ, ಎಸ್. ಅನು, ಗಂಗಮ್ಮ, ರವಿ, ಎಸ್.ಎನ್ ಆನಂದಕುಮಾರ್, ಎಚ್. ಶಾಂತ, ಜಿ. ಆನಂದಪ್ಪ ಮತ್ತು ಬಿ. ಮೋನಿಷಾ ಹಾಗು ಸುತ್ತಮುತ್ತಲ ಗ್ರಾ.ಪಂ.ಗಳ ಸದಸ್ಯರು, ಗ್ರಾಮದ ಮುಖಂಡರು ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.
        ಇದಕ್ಕೂ ಮೊದಲು ಸಸಿಗಳನ್ನು ನೆಡುವ ಮೂಲಕ ವನ ಮಹೋತ್ಸವ ಆಚರಿಸಲಾಯಿತು. ಶಾಸಕ ಬಿ.ಕೆ ಸಂಗಮೇಶ್ವರ್ ತ್ಯಾಜ್ಯ ವಿಲೇವಾರಿ ವಾಹನವನ್ನು ಗ್ರಾ.ಪಂ. ಅಧ್ಯಕ್ಷರಿಗೆ ಹಸ್ತಾಂತರಿಸಿದರು. ಕುಡಿಯುವ ನೀರು ಹಾಗು ನೈರ್ಮಲ್ಯ ಕುರಿತು ಸಮಸ್ಯೆಗಳಿಗೆ ಸಂಬಂಧಿಸಿದಂತೆ ಪರಿಹಾರ ಸಹಾಯವಾಣಿ ಸಂಖ್ಯೆ ಬಿಡುಗಡೆಗೊಳಿಸಲಾಯಿತು.

Sunday, July 4, 2021

ಪೈಂಟರ್‍ಸ್ ಸಂಘಕ್ಕೆ ಎಲ್ಲಾ ರೀತಿಯ ಸಹಕಾರ ನೀಡಲು ಬದ್ಧ : ಸಂಗಮೇಶ್ವರ್

ಭದ್ರಾವತಿ ನ್ಯೂಟೌನ್ ಶ್ರೀ ಸತ್ಯಸಾಯಿ ಸೇವಾ ಕ್ಷೇತ್ರದ ಶ್ರೀ ಶಿವ ಸಾಯಿ ಕೃಪಾ ಧಾಮದಲ್ಲಿ  ತಾಲೂಕು ಪೈಂಟರ್‍ಸ್ ಸಂಘದ ನೂತನ ಪದಾಧಿಕಾರಿಗಳಿಗೆ ಅಭಿನಂದನೆ ಹಾಗು ದಿನಸಿ ಸಾಮಗ್ರಿ ವಿತರಣೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.
   ಭದ್ರಾವತಿ, ಜು. ೪: ನಗರದಲ್ಲಿ ನೂತನವಾಗಿ ಅಸ್ತಿತ್ವಕ್ಕೆ ಬಂದಿರುವ ಪೈಂಟರ್‍ಸ್ ಸಂಘಕ್ಕೆ ಎಲ್ಲಾ ರೀತಿಯ ಸಹಕಾರ ನೀಡುವುದಾಗಿ ಶಾಸಕ ಬಿ.ಕೆ ಸಂಗಮೇಶ್ವರ್ ಭರವಸೆ ನೀಡಿದರು.
    ಅವರು ನ್ಯೂಟೌನ್ ಶ್ರೀ ಸತ್ಯಸಾಯಿ ಸೇವಾ ಕ್ಷೇತ್ರದ ಶ್ರೀ ಶಿವ ಸಾಯಿ ಕೃಪಾ ಧಾಮದಲ್ಲಿ ಹಮ್ಮಿಕೊಳ್ಳಲಾಗಿದ್ದ ದಿನಸಿ ಸಾಮಗ್ರಿ ವಿತರಣೆ ಹಾಗು ನೂತನ ಪದಾಧಿಕಾರಿಗಳಿಗೆ ಅಭಿನಂದನೆ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದರು.
   ಪೈಂಟರ್‍ಸ್ ಸಂಘಕ್ಕೆ ಸರ್ಕಾರದಿಂದ ಲಭಿಸುವ ಎಲ್ಲಾ ಸೌಲಭ್ಯಗಳನ್ನು ಕಲ್ಪಿಸಿಕೊಡಲು ಪ್ರಾಮಾಣಿಕವಾಗಿ ಪ್ರಯತ್ನಿಸುತ್ತೇನೆ. ಜೊತೆಗೆ ವೈಯಕ್ತಿಕವಾಗಿ ಸಹ ನೆರವು ನೀಡಲು ಬದ್ಧ ಎಂದರು.
   ಸಂಘದ ಗೌರವಾಧ್ಯಕ್ಷ ಶಿವಣ್ಣ, ಗೌರವ ಸಲಹೆಗಾರ ಸಂಪತ್, ಅಧ್ಯಕ್ಷ ಮಂಜುನಾಥ್, ಉಪಾಧ್ಯಕ್ಷ ಶ್ರೀನಿವಾಸ್, ಪ್ರಧಾನ ಕಾರ್ಯದರ್ಶಿ ಪಚ್ಚಿಯಪ್ಪ, ಖಜಾಂಚಿ ಕುಮಾರ್, ಕಾರ್ಯದರ್ಶಿ ಮಂಜುನಾಥ್, ಸಹ ಕಾರ್ಯದರ್ಶಿ ರಾಘವೇಂದ್ರ ಹಾಗು ಪದಾಧಿಕಾರಿಗಳನ್ನು ಸನ್ಮಾನಿಸಿ ಅಭಿನಂದಿಸಲಾಯಿತು.
   ಕರ್ನಾಟಕ ಸ್ಟೇಟ್ ಕನ್‌ಸ್ಟ್ರಕ್ಷನ್ ವರ್ಕರ್ಸ್ ಸೆಂಟ್ರಲ್ ಯೂನಿಯನ್ ತಾಲೂಕು ಗೌರವಾಧ್ಯಕ್ಷ ಸುರೇಶ್‌ಕುಮಾರ್, ಸಂಘಟನಾ ಕಾರ್ಯದರ್ಶಿ ಅಭಿಲಾಷ್ ಸೇರಿದಂತೆ ಪದಾಧಿಕಾರಿಗಳು ಉಪಸ್ಥಿತರಿದ್ದರು.

ಬಜರಂಗದಳ ಕಾರ್ಯಕರ್ತರ ಸೇವೆಗೆ ಸವಿತಾ ಸಮಾಜ ಶ್ಲಾಘನೆ

ಕೋವಿಡ್-೧೯ ಸೋಂಕಿನಿಂದ ಮೃತಪಟ್ಟವರ ಅಂತ್ಯಸಂಸ್ಕಾರ ಉಚಿತವಾಗಿ ನೆರವೇರಿಸುವ ಮೂಲಕ ಮಾನವೀಯತೆ ಮೆರೆಯುತ್ತಿರುವ ಭದ್ರಾವತಿ ನಗರದ ಬಜರಂಗದಳ ಕಾರ್ಯಕರ್ತರನ್ನು ತಾಲೂಕು ಸವಿತಾ ಸಮಾಜದ ವತಿಯಿಂದ ವಿಶೇಷವಾಗಿ ಸನ್ಮಾನಿಸಿ ಅಭಿನಂದಿಸಲಾಯಿತು.
   ಭದ್ರಾವತಿ, ಜು. ೪:  ಕೋವಿಡ್-೧೯ ಸೋಂಕಿನಿಂದ ಮೃತಪಟ್ಟವರ ಅಂತ್ಯಸಂಸ್ಕಾರ ಉಚಿತವಾಗಿ ನೆರವೇರಿಸುವ ಮೂಲಕ ಮಾನವೀಯತೆ ಮೆರೆಯುತ್ತಿರುವ ನಗರದ ಬಜರಂಗದಳ ಕಾರ್ಯಕರ್ತರನ್ನು ತಾಲೂಕು ಸವಿತಾ ಸಮಾಜದ ವತಿಯಿಂದ ವಿಶೇಷವಾಗಿ ಸನ್ಮಾನಿಸಿ ಅಭಿನಂದಿಸಲಾಯಿತು.
   ಸಮಾಜದ ಅಧ್ಯಕ್ಷ ವಿಶ್ವನಾಥ್ ನೇತೃತ್ವದಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದ ಪ್ರಮುಖರು, ಬಜರಂಗದಳ ಕಾರ್ಯಕರ್ತರ ಸೇವೆಗೆ ಯಾರಿಂದಲೂ ಬೆಲೆ ಕಟ್ಟಲು ಸಾಧ್ಯವಿಲ್ಲ. ಅಲ್ಲದೆ ಸೇವಾ ಕಾರ್ಯ ಭವಿಷ್ಯದ ಯುವ ಪೀಳಿಗೆಗೆ ಮಾದರಿಯಾಗಿದೆ ಎಂದು ಪ್ರಶಂಸೆ ವ್ಯಕ್ತಪಡಿಸಿದರು.
   ನಗರಸಭೆ ೬ನೇ ವಾರ್ಡ್‌ಗೆ ನೂತನವಾಗಿ ಆಯ್ಕೆಯಾಗಿರುವ ಸದಸ್ಯ ಆರ್. ಶ್ರೇಯಸ್ ಅವರನ್ನು ಸನ್ಮಾನಿಸಿ ಗೌರವಿಸಲಾಯಿತು. ಕರ್ನಾಟಕ ರಕ್ಷಣಾ ವೇದಿಕೆ ಅಧ್ಯಕ್ಷ ಎಂ. ಪರಮೇಶ್ ಹಾಗು ಸವಿತಾ ಸಮಾಜದ ಪದಾಧಿಕಾರಿಗಳು ಹಾಗು ಯುವ ಘಟಕದ ಅಧ್ಯಕ್ಷರು, ಪದಾಧಿಕಾರಿಗಳು ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.


ಜು.೫ರಂದು ಬೆಲೆ ಏರಿಕೆ ಖಂಡಿಸಿ ಜೆಡಿಎಸ್ ಪ್ರತಿಭಟನೆ

ಆರ್. ಕರುಣಾಮೂರ್ತಿ
     ಭದ್ರಾವತಿ, ಜು. ೪: ಕೇಂದ್ರ ಹಾಗು ರಾಜ್ಯ ಸರ್ಕಾರಗಳ ಬೆಲೆ ಏರಿಕೆ ನೀತಿ ಖಂಡಿಸಿ ಜು.೫ರಂದು ಬೆಳಿಗ್ಗೆ ೧೧ ಗಂಟೆಗೆ ತಾಲೂಕು ಕಛೇರಿ ಮಿನಿ ವಿಧಾನಸೌಧದ ಮುಂಭಾಗ ಜಾತ್ಯಾತೀತ ಜನತಾದಳ ವತಿಯಿಂದ ಶಾರದ ಅಪ್ಪಾಜಿ ನೇತೃತ್ವದಲ್ಲಿ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ.
    ಪೆಟ್ರೋಲ್, ಡೀಸೆಲ್ ಮತ್ತು ಅಡುಗೆ ಅನಿಲ ಹಾಗು ಅಗತ್ಯ ವಸ್ತುಗಳ ಬೆಲೆ ಏರಿಕೆಯಿಂದಾಗಿ ಜನ ಸಾಮಾನ್ಯರು ಬದುಕು ಸಾಗಿಸುವುದು ಕಷ್ಟಕರವಾಗಿದೆ. ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಬೆಲೆ ಏರಿಕೆಗೆ ಕಡಿವಾಣ ಹಾಕುವ ಮೂಲಕ ಜನ ಸಾಮಾನ್ಯರು ನೆಮ್ಮದಿಯಾಗಿ ಬದುಕು ಸಾಗಿಸಲು ಅವಕಾಶ ಕಲ್ಪಿಸಿಕೊಡುವಂತೆ ಆಗ್ರಹಿಸಿ ಪ್ರಧಾನ ಮಂತ್ರಿಗಳಿಗೆ ಮತ್ತು ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಲಾಗುವುದು.
    ಪಕ್ಷದ ವಿವಿಧ ಘಟಕಗಳ ಅಧ್ಯಕ್ಷರು, ಪದಾಧಿಕಾರಿಗಳು, ಚುನಾಯಿತ ಪ್ರತಿನಿಧಿಗಳು, ಮುಖಂಡರು, ಕಾರ್ಯಕರ್ತರು, ವಿವಿಧ ಸಂಘ-ಸಂಸ್ಥೆಗಳು, ಜನ ಸಾಮಾನ್ಯರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಪ್ರತಿಭಟನೆ ಯಶಸ್ವಿಗೊಳಿಸುವಂತೆ ಪಕ್ಷದ ತಾಲೂಕು ಅಧ್ಯಕ್ಷ ಆರ್. ಕರುಣಾಮೂರ್ತಿ ಕೋರಿದ್ದಾರೆ.

Saturday, July 3, 2021

ಸರ್ಕಾರ ನಿರ್ದೇಶನದಂತೆ ಸಾಲ ವಸೂಲಾತಿ ಕೈಗೊಳ್ಳಿ : ಮೈಕ್ರೋ ಫೈನಾನ್ಸ್ ಕಂಪನಿಗಳಿಗೆ ಸೂಚನೆ

    ಭದ್ರಾವತಿ, ಜು. ೩: ಮೈಕ್ರೋ ಫೈನಾನ್ಸ್ ಕಂಪನಿಗಳು ಸಾಲ ವಸೂಲಾತಿಯಲ್ಲಿ ಒತ್ತಡ ಹೇರದೆ ಸರ್ಕಾರದ ನಿರ್ದೇಶನದಂತೆ ನಡೆದುಕೊಳ್ಳಬೇಕೆಂದು ಉಪ ತಹಸೀಲ್ದಾರ್ ಮಂಜನಾಯ್ಕ ಶನಿವಾರ ನಡೆದ ಸಭೆಯಲ್ಲಿ ಕಂಪನಿಗಳ ವ್ಯವಸ್ಥಾಪಕರಿಗೆ ಸೂಚಿಸಿದರು.
    ತಾಲೂಕಿನಲ್ಲಿ ಕಾರ್ಯ ನಿರ್ವಹಿಸುತ್ತಿರುವ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಹೊರತುಪಡಿಸಿ ಉಳಿದೆಲ್ಲ ಮೈಕ್ರೋ ಫೈನಾನ್ಸ್ ಕಂಪನಿಗಳು ಸಾಲ ವಸೂಲಾತಿಗಾಗಿ ಮಹಿಳೆಯರಿಗೆ ಪೀಡಿಸುತ್ತಿದ್ದು, ಕೊರೋನಾ ಸಂಕಷ್ಟದ ಸಂದರ್ಭದಲ್ಲೂ ಸಾಲ ಮರುಪಾವತಿಗೆ ಕಾಲಾವಕಾಶ ನೀಡದಿರುವುದು ಸರಿಯಲ್ಲ. ಕಂಪನಿಗಳು ಸರ್ಕಾರದ ನಿರ್ದೇಶನಗಳನ್ನು ಪಾಲಿಸುತ್ತಿಲ್ಲ ಎಂದು ಆರೋಪಿಸಿ ತಕ್ಷಣ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ಸಂಯುಕ್ತ ಜನತಾದಳ ರಾಜ್ಯ ಕಾರ್ಯದರ್ಶಿ ಶಶಿಕುಮಾರ್ ಎಸ್ ಗೌಡ ಶುಕ್ರವಾರ ತಾಲೂಕು ಕಚೇರಿ ಮುಂಭಾಗ ಪ್ರತಿಭಟನೆ ನಡೆಸಿ ತಾಲೂಕು ಆಡಳಿತಕ್ಕೆ ಮನವಿ ಸಲ್ಲಿಸಿದ್ದರು.
     ಈ ಹಿನ್ನಲೆಯಲ್ಲಿ ಕಂಪನಿಗಳ ಸ್ಥಳೀಯ ವ್ಯವಸ್ಥಾಪಕರೊಂದಿಗೆ ಸಭೆ ನಡೆಸಿ ಸಾಲ ವಸೂಲಾತಿಯಲ್ಲಿ ಕಾನೂನು ಬಾಹಿರವಾಗಿ ಒತ್ತಡ ಹೇರದೆ ಸರ್ಕಾರದ ನಿರ್ದೇಶನದಂತೆ ನಡೆದುಕೊಳ್ಳಬೇಕೆಂದು ತಿಳಿಸಲಾಯಿತು. ಇದಕ್ಕೆ ಕಂಪನಿಗಳ ವ್ಯವಸ್ಥಾಪಕರು ಪೂರಕವಾಗಿ ಸ್ಪಂದಿಸಿದ್ದು, ಸಾಲ ವಸೂಲಾತಿಯಲ್ಲಿ ಸರ್ಕಾರದ ನಿರ್ದೇಶನಗಳನ್ನು ಪಾಲಿಸುವುದಾಗಿ ಭರವಸೆ ನೀಡಿದರು. ಸಭೆಯಲ್ಲಿ ಶಶಿಕುಮಾರ್ ಎಸ್. ಗೌಡ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.